ವರ್ಷಪೂರ್ತಿ 'ಕರ್ನಾಟಕ ಸುವರ್ಣ ಸಂಭ್ರಮ' ಆಚರಣೆ: ಸಿಎಂ ಸಿದ್ದರಾಮಯ್ಯ
ರಾಜ್ಯವು ಕರ್ನಾಟಕ ಎಂದು ಮರು ನಾಮಕರಣಗೊಂಡು 50 ವರ್ಷ ಪೂರೈಸಿದ್ದು, ಈ ಸುವರ್ಣ ಸಂಭ್ರಮವನ್ನು ವರ್ಷಪೂರ್ತಿ ಆಚರಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.
ಹೊಸಪೇಟೆ (ನ.03): ರಾಜ್ಯವು ಕರ್ನಾಟಕ ಎಂದು ಮರು ನಾಮಕರಣಗೊಂಡು 50 ವರ್ಷ ಪೂರೈಸಿದ್ದು, ಈ ಸುವರ್ಣ ಸಂಭ್ರಮವನ್ನು ವರ್ಷಪೂರ್ತಿ ಆಚರಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಹೊಸಪೇಟೆಯ ಅಮರಾವತಿ ನಗರದಲ್ಲಿ ಗುರುವಾರ ಸರ್ಕಾರಿ ಬಾಲಕಿಯರ ಪದವಿಪೂರ್ವ ಕಾಲೇಜು ಕಟ್ಟಡದ ಲೋಕಾರ್ಪಣೆ ಹಾಗೂ ಬಾಲಕಿಯರ ಪ್ರೌಢಶಾಲೆ, ಮುನ್ಸಿಪಲ್ ಬಾಲಕಿಯರ ಪ್ರೌಢಶಾಲೆ, ನಗರ ಗ್ರಂಥಾಲಯ, ಜಿಲ್ಲಾ ಕೃಷಿ ಭವನ ಮತ್ತು ಸಮಗ್ರ ಕೃಷಿ ಪದ್ಧತಿಯ ಉತ್ಕೃಷ್ಟ ಕೇಂದ್ರದ ಕಟ್ಟಡಗಳ ಉದ್ಘಾಟನೆ ನೆರವೇರಿಸಿ, ಸುದ್ದಿಗಾರರೊಂದಿಗೆ ಮಾತನಾಡಿದರು.
ಕರ್ನಾಟಕ ಸುವರ್ಣ ಸಂಭ್ರಮವನ್ನು ''ಹೆಸರಾಯಿತು ಕರ್ನಾಟಕ, ಉಸಿರಾಗಲಿ ಕನ್ನಡ'' ಎಂಬ ಘೋಷವಾಕ್ಯದೊಂದಿಗೆ ಆಚರಿಸಲಾಗುತ್ತಿದೆ. ಮುಂದಿನ ವರ್ಷ ನ. 1ರ ವರೆಗೆ ವಿವಿಧ ಕಾರ್ಯಕ್ರಮಗಳು ನಡೆಯಲಿವೆ. ಹೊಸಪೇಟೆಯಲ್ಲಿ ಒಟ್ಟು ₹36 ಕೋಟಿ ವೆಚ್ಚದಲ್ಲಿ ನಿರ್ಮಾಣಗೊಂಡ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಇಂದು ಚಾಲನೆ ದೊರೆತಿದೆ. ಬಾಲಕಿಯರ ಪದವಿಪೂರ್ವ ಕಾಲೇಜು ಕಟ್ಟಡವು ಸುಸಜ್ಜಿತವಾಗಿ ನಿರ್ಮಾಣ ಮಾಡಲಾಗಿದೆ. ಇದರಿಂದ ಹೈಸ್ಕೂಲ್ ಮತ್ತು ಪದವಿಪೂರ್ವ ಕಾಲೇಜಿನಲ್ಲಿ ವಿದ್ಯಾಭ್ಯಾಸ ಮಾಡುತ್ತಿರುವ ಸುಮಾರು 2.5 ರಿಂದ 3 ಸಾವಿರ ವಿದ್ಯಾರ್ಥಿಗಳಿಗೆ ಅನುಕೂಲವಾಗಲಿದೆ.
ನಾನೂ ರೈತನ ಮಗ, ಕಷ್ಟ ಏನೆಂದು ನನಗೂ ಗೊತ್ತಿದೆ: ಸಿದ್ದರಾಮಯ್ಯ
ಎಲ್ಲ ಸೌಕರ್ಯಗಳನ್ನು ಒದಗಿಸುವಂತಹ ಕೆಲಸ ಕೆಕೆಆರ್‌ಡಿಬಿಯಿಂದಾಗಿದೆ. ವಿಜಯನಗರಕ್ಕೆ ಮಹಿಳಾ ಪದವಿ ಕಾಲೇಜು ಮತ್ತು ಮಹಿಳಾ ಪೊಲೀಸ್ ಠಾಣೆ ಬೇಕೆಂಬ ಬೇಡಿಕೆಯನ್ನು ಪರಿಶೀಲಿಸಲಾಗುವುದು ಎಂದರು. ಈ ಸಂದರ್ಭದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಜಮೀರ್ ಅಹಮದ್ ಖಾನ್, ಹಿಂದುಳಿದ ವರ್ಗಗಳ ಕಲ್ಯಾಣ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಶಿವರಾಜ ಎಸ್. ತಂಗಡಗಿ, ನಗರಾಭಿವೃದ್ಧಿ ಮತ್ತು ನಗರ ಯೋಜನೆ ಸಚಿವ ಭೈರತಿ ಸುರೇಶ್, ಕೆಎಂಎಫ್ ಅಧ್ಯಕ್ಷ ಭೀಮಾನಾಯ್ಕ್, ಶಾಸಕರಾದ ಎಚ್.ಆರ್. ಗವಿಯಪ್ಪ, ಡಾ. ಎನ್.ಟಿ. ಶ್ರೀನಿವಾಸ ಮೂರ್ತಿ.
ಎಂ.ಪಿ. ಲತಾ ಮಲ್ಲಿಕಾರ್ಜುನ, ಈ. ತುಕಾರಾಂ, ಜಿ.ಎನ್. ಗಣೇಶ್, ಕೆ. ರಾಘವೇಂದ್ರ ಹಿಟ್ನಾಳ, ಜಿಲ್ಲಾಧಿಕಾರಿ ಎಂ.ಎಸ್. ದಿವಾಕರ್, ಐ.ಜಿ. ಲೋಕೇಶ್ ಕುಮಾರ್, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಸದಾಶಿವ ಪ್ರಭು ಬಿ., ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಶ್ರೀಹರಿ ಬಾಬು ಬಿ.ಎಲ್., ಅಪರ ಜಿಲ್ಲಾಧಿಕಾರಿ ಅನುರಾಧ ಜಿ., ಹೊಸಪೇಟೆ ಉಪವಿಭಾಗಾಧಿಕಾರಿ ಮಹದ್‌ಅಲಿ ಅಕ್ರಮ ಷಾಹ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು, ಜನಪ್ರತಿನಿಧಿಗಳು ಹಾಗೂ ಹಲವು ಗಣ್ಯರು ಉಪಸ್ಥಿತರಿದ್ದರು.
ಕೇಂದ್ರ ಸಚಿವ ಶೆಖಾವತ್ ಆತ್ಮವಿಮರ್ಶೆ ಮಾಡಿಕೊಳ್ಳಲಿ: ಸಿದ್ದರಾಮಯ್ಯ
ಚಿಣ್ಣರೊಂದಿಗೆ ಸಂವಾದ: ಬಾಲಕಿಯರ ಕಾಲೇಜು ಹಾಗೂ ಹೈಸ್ಕೂಲ್ ಕಟ್ಟಡ ಉದ್ಘಾಟನೆ ವೇಳೆ ಬಾಲಕಿಯರೊಂದಿಗೆ ಸಂವಾದ ನಡೆಸಿದ ಮುಖ್ಯಮಂತ್ರಿ ಸಿದ್ದರಾಮಯ್ಯನವರು, ಉತ್ತಮವಾಗಿ ಓದಿ, ಹೆಸರು ಮಾಡಬೇಕು. ಕಟ್ಟಡವೂ ಚೆನ್ನಾಗಿದೆ. ನೀವೆಲ್ಲರೂ ಓದಿ ಹೊಸ ಜಿಲ್ಲೆಗೆ ಹೆಸರು ತರಬೇಕು ಎಂದರು.