2.5 ವರ್ಷ ಡಿ.ಕೆ.ಶಿವಕುಮಾರ್ ಸಿಎಂ: ಇಬ್ಬರು ಶಾಸಕರ ಭವಿಷ್ಯ
ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಎರಡೂವರೆ ವರ್ಷದ ನಂತರ ಮುಖ್ಯಮಂತ್ರಿ ಆಗುವುದು ನಿಶ್ಚಿತ ಎಂದು ಮಂಡ್ಯ ಶಾಸಕ ರವಿಕುಮಾರ್ ಗಣಿಗ ಹಾಗೂ ಚನ್ನಗಿರಿ ಶಾಸಕ ಶಿವಗಂಗಾ ವಿ.ಬಸವರಾಜ ಅವರು ಹೇಳಿರುವುದು ಸಂಚಲನಕ್ಕೆ ಕಾರಣವಾಗಿದೆ.
ದಾವಣಗೆರೆ (ಅ.28): ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಎರಡೂವರೆ ವರ್ಷದ ನಂತರ ಮುಖ್ಯಮಂತ್ರಿ ಆಗುವುದು ನಿಶ್ಚಿತ ಎಂದು ಮಂಡ್ಯ ಶಾಸಕ ರವಿಕುಮಾರ್ ಗಣಿಗ ಹಾಗೂ ಚನ್ನಗಿರಿ ಶಾಸಕ ಶಿವಗಂಗಾ ವಿ.ಬಸವರಾಜ ಅವರು ಹೇಳಿರುವುದು ಸಂಚಲನಕ್ಕೆ ಕಾರಣವಾಗಿದೆ. ಅವರ ಹೇಳಿಕೆಗೆ ಮದ್ದೂರು ಶಾಸಕ ಕೆ.ಎಂ.ಉದಯ್ ಕೂಡ ದನಿಗೂಡಿಸಿದ್ದು, ಸಿದ್ದರಾಮಯ್ಯ ನಂತರ ಡಿ.ಕೆ.ಶಿವಕುಮಾರ್ ಮುಖ್ಯಮಂತ್ರಿ ಆಗಿಯೇ ಆಗುತ್ತಾರೆ. ಆದರೆ ಯಾವಾಗ ಆಗಬೇಕೆಂಬುದನ್ನು ಹೈಕಮಾಂಡ್ ನಿರ್ಧರಿಸುತದೆ ಎಂದು ತಿಳಿಸಿದ್ದಾರೆ.
ಜಂಟಿ ಹೇಳಿಕೆ: ದಾವಣಗೆರೆ ನಗರದಲ್ಲಿ ಶುಕ್ರವಾರ ಸುದ್ದಿಗಾರರೊಂದಿಗೆ ಮಾತನಾಡಿದ ಶಾಸಕರಾದ ರವಿಕುಮಾರ್ ಗಣಿಗ ಹಾಗೂ ಶಿವಗಂಗಾ ಅವರು, ಎರಡೂವರೆ ವರ್ಷ ಡಿ.ಕೆ.ಶಿವಕುಮಾರ್ ಮುಖ್ಯಮಂತ್ರಿ ಆಗಿಯೇ ಆಗುತ್ತಾರೆ ನೋಡ್ತಾ ಇರಿ. ಡಿ.ಕೆ.ಶಿವಕುಮಾರ್ ಮುಖ್ಯಮಂತ್ರಿ ಆಗೋದು ಗ್ಯಾರಂಟಿ. ಅವರು ಪಕ್ಷಕ್ಕಾಗಿ ಸಾಕಷ್ಟು ದುಡಿದಿದ್ದಾರೆ. ಈ ವಿಚಾರದಲ್ಲಿ ಯಾವುದೇ ಗೊಂದಲವೂ ಇಲ್ಲ ಎಂದು ಶಾಸಕರು ಸ್ಪಷ್ಟಪಡಿಸಿದರು. ಹೈಕಮಾಂಡ್ ಮಟ್ಟದಲ್ಲಿ ಏನು ಆಗಿದೆಯೋ ನಮಗೆ ಗೊತ್ತಿಲ್ಲ. ಕೆಪಿಸಿಸಿ ಅಧ್ಯಕ್ಷರಾದವರು ಮುಖ್ಯಮಂತ್ರಿ ಆಗಲೇಬೇಕು. ಕಾಲ ಬಂದಾಗ ಎಲ್ಲವೂ ನಿರ್ಣಯವಾಗಲಿದೆ. ಡಿ.ಕೆ.ಶಿವಕುಮಾರ್ ಮುಖ್ಯಮಂತ್ರಿ ಆಗುವುದಂತೂ ನಿಶ್ಚಿತ ಎಂದು ಅವರು ಹೇಳಿದರು.
ಹುಲಿ ಉಗುರು ನಕಲಿ, ಅಸಲಿ ಎಂದು ನಮಗೆ ಗೊತ್ತಾಗಲ್ಲ: ಮಧು ಬಂಗಾರಪ್ಪ
ಈ ಇಬ್ಬರು ಶಾಸಕರ ಹೇಳಿಕೆಗೆ ಮದ್ದೂರು ಶಾಸಕ ಕೆ.ಎಂ.ಉದಯ್, ಸಿದ್ದರಾಮಯ್ಯ ಮುಖ್ಯಮಂತ್ರಿಯಾಗಿ ಉತ್ತಮ ಆಡಳಿತ ನಡೆಸುತ್ತಿದ್ದಾರೆ. ಅದೇ ರೀತಿ ಡಿ.ಕೆ.ಶಿವಕುಮಾರ್ ಕೂಡ ಉತ್ತಮವಾಗಿ ಪಕ್ಷ ಸಂಘಟನೆ ಮಾಡಿದ್ದಾರೆ. ಮುಖ್ಯಮಂತ್ರಿಯಾಗುವ ಅರ್ಹತೆ, ಯೋಗ್ಯತೆ ಡಿ.ಕೆ.ಶಿವಕುಮಾರ್ ಅವರಿಗೂ ಇದೆ. ಅವರು ಮುಖ್ಯಮಂತ್ರಿ ಆಗಬೇಕು. ಸಿದ್ದರಾಮಯ್ಯನವರ ನಂತರ ಡಿ.ಕೆ.ಶಿವಕುಮಾರ್ ಮುಖ್ಯಮಂತ್ರಿ ಆಗಿಯೇ ಆಗುತ್ತಾರೆ ಎಂದರು. ಅಧಿಕಾರ ಹಂಚಿಕೆ ಕುರಿತಂತೆ ಯಾವ ಶಾಸಕರೂ ಮಾಧ್ಯಮಗಳ ಮುಂದೆ ಹೇಳಿಕೆ ನೀಡಬಾರದು ಎಂದು ಡಿಕೆಶಿ ಹೇಳಿದ್ದರು. ಆದಾಗ್ಯೂ ಶಾಸಕರು ಈ ರೀತಿ ಹೇಳಿಕೆ ನೀಡಿದ್ದಾರೆ.