ಗ್ಯಾರಂಟಿ ಕಾರ್ಯಕ್ರಮಗಳ ಘೋಷಣೆ ಕಾರ್ಯಕ್ರಮಕ್ಕೆ ವರಿಷ್ಠರಾದ ರಾಹುಲ್‌ ಗಾಂಧಿ ಹಾಗೂ ಪ್ರಿಯಾಂಕಾ ಗಾಂಧಿ ಅವರನ್ನು ಆಹ್ವಾನಿಸಿ ಅವರ ಸಮ್ಮುಖದಲ್ಲಿ ಯೋಜನೆ ಘೋಷಣೆ ಮಾಡುವ ಉದ್ದೇಶ ನಾಯಕರಿಗೆ ಇದೆ. ಆದರೆ, ಈ ಬಗ್ಗೆ ಇನ್ನೂ ತೀರ್ಮಾನವಾಗಿಲ್ಲ.

ಬೆಂಗಳೂರು(ಮೇ.19):  ಸಿದ್ದರಾಮಯ್ಯ ಅವರು ಶನಿವಾರ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕಾರ ಮಾಡಿದ ತಕ್ಷಣ ಸಚಿವ ಸಂಪುಟ ಸಭೆ ನಡೆಸಿ ಕಾಂಗ್ರೆಸ್‌ ಘೋಷಿಸಿದ್ದ ಐದೂ ಗ್ಯಾರಂಟಿ ಯೋಜನೆಗಳ ಜಾರಿಗೆ ಆದೇಶ ಹೊರಡಿಸಲಿದ್ದಾರೆ.

ಉಳಿದಂತೆ ಸಚಿವ ಸಂಪುಟ ಸಭೆ ಬೆನ್ನಲ್ಲೇ ಸುದ್ದಿಗೋಷ್ಠಿ ನಡೆಸಿ ಐದೂ ಯೋಜನೆಗಳನ್ನು ಪ್ರಕಟಿಸಲಿದ್ದಾರೆಯೇ ಅಥವಾ ಕಾಂಗ್ರೆಸ್‌ ವರಿಷ್ಠರನ್ನು ಕರೆಸಿ ಬೃಹತ್‌ ಸಮಾವೇಶ ನಡೆಸಿ ಗ್ಯಾರಂಟಿ ಯೋಜನೆಗಳಿಗೆ ಚಾಲನೆ ನೀಡಲಿದ್ದಾರೆಯೇ ಎಂಬುದು ಇನ್ನೂ ನಿರ್ಧಾರವಾಗಿಲ್ಲ ಎಂದು ತಿಳಿದುಬಂದಿದೆ.

ನಾಳೆ ಸಿದ್ದು, ಡಿಕೆಶಿ ಪ್ರಮಾಣ ವಚನಕ್ಕೆ 1 ಲಕ್ಷ ಜನ: ಸ್ಟಾಲಿನ್‌, ನಿತೀಶ್‌, ಪವಾರ್‌, ಠಾಕ್ರೆ, ಫಾರೂಕ್‌ಗೆ ಆಹ್ವಾನ

ಮೂಲಗಳ ಪ್ರಕಾರ, ಗ್ಯಾರಂಟಿ ಕಾರ್ಯಕ್ರಮಗಳ ಘೋಷಣೆ ಕಾರ್ಯಕ್ರಮಕ್ಕೆ ವರಿಷ್ಠರಾದ ರಾಹುಲ್‌ ಗಾಂಧಿ ಹಾಗೂ ಪ್ರಿಯಾಂಕಾ ಗಾಂಧಿ ಅವರನ್ನು ಆಹ್ವಾನಿಸಿ ಅವರ ಸಮ್ಮುಖದಲ್ಲಿ ಯೋಜನೆ ಘೋಷಣೆ ಮಾಡುವ ಉದ್ದೇಶ ನಾಯಕರಿಗೆ ಇದೆ. ಆದರೆ, ಈ ಬಗ್ಗೆ ಇನ್ನೂ ತೀರ್ಮಾನವಾಗಿಲ್ಲ.

ಶನಿವಾರ ಮಧ್ಯಾಹ್ನ ಸಿದ್ದರಾಮಯ್ಯ ಹಾಗೂ ನಿಯೋಜಿತ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌ ಅವರು ಕಂಠೀರವ ಕ್ರೀಡಾಂಗಣದಲ್ಲಿ ಪ್ರಮಾಣವಚನ ಸ್ವೀಕಾರ ಮಾಡಲಿದ್ದಾರೆ. ಬಳಿಕ ಸಚಿವ ಸಂಪುಟ ಸಭೆ ನಡೆಸಿ ಪ್ರತಿ ಮನೆಗೆ 200 ಯುನಿಟ್‌ ಉಚಿತ ವಿದ್ಯುತ್‌ ನೀಡುವ ‘ಗೃಹ ಜ್ಯೋತಿ’, ಪ್ರತಿ ಮನೆಯೊಡತಿಗೆ 2 ಸಾವಿರ ರು. ಮಾಸಿಕ ಸಹಾಯ ಧನ ನೀಡುವ ‘ಗೃಹ ಲಕ್ಷ್ಮೇ’, ಪದವೀಧರರಿಗೆ 3 ಸಾವಿರ ರು. ಹಾಗೂ ಡಿಪ್ಲೊಮಾ ಪದವೀಧರರಿಗೆ 1,500 ರು. ಮಾಸಿಕ ನಿರುದ್ಯೋಗ ಭತ್ಯೆ ನೀಡುವ ‘ಯುವ ನಿಧಿ’, ಪ್ರತಿ ತಿಂಗಳು ಪ್ರತಿ ವ್ಯಕ್ತಿಗೆ 10 ಕೆ.ಜಿ. ಅಕ್ಕಿ ನೀಡುವ ‘ಅನ್ನಭಾಗ್ಯ’, ಮಹಿಳೆಯರಿಗೆ ಉಚಿತ ಪ್ರಯಾಣದ ‘ಶಕ್ತಿ’ ಭರವಸೆ ಸೇರಿದಂತೆ ಐದು ಗ್ಯಾರಂಟಿ ಯೋಜನೆಗಳಿಗೆ ಅಧಿಕೃತ ಅನುಮೋದನೆ ನೀಡಿ ಆದೇಶ ಹೊರಡಿಸಲಿದ್ದಾರೆ.