ಯೋಜನೆಗಳ ಅನುಷ್ಠಾನ ನಿರ್ಲಕ್ಷಿಸಿದರೆ ಕ್ರಮ: ಸಚಿವ ಮುನಿಯಪ್ಪ ಎಚ್ಚರಿಕೆ
ಸರ್ಕಾರಿ ಸೌಲಭ್ಯಗಳನ್ನು ಜನಸಾಮಾನ್ಯರಿಗೆ ತಲುಪಿಸುವ ಕಾರ್ಯದಲ್ಲಿ ನಿರ್ಲಕ್ಷ್ಯ ತೋರುವ ಅಧಿಕಾರಿಗಳ ಮೇಲೆ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳಲಾಗುವುದು ಎಂದು ಆಹಾರ ಮತ್ತು ನಾಗರಿಕ ಸರಬರಾಜು, ಗ್ರಾಹಕ ವ್ಯವಹಾರಗಳ ಸಚಿವ ಹಾಗೂ ಬೆಂ.ಗ್ರಾ. ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಚ್.ಮುನಿಯಪ್ಪ ಅವರು ಅಧಿಕಾರಿಗಳಿಗೆ ಎಚ್ಚರಿಕೆ ನೀಡಿದರು.
ದೊಡ್ಡಬಳ್ಳಾಪುರ (ಜೂ.17): ಸರ್ಕಾರಿ ಸೌಲಭ್ಯಗಳನ್ನು ಜನಸಾಮಾನ್ಯರಿಗೆ ತಲುಪಿಸುವ ಕಾರ್ಯದಲ್ಲಿ ನಿರ್ಲಕ್ಷ್ಯ ತೋರುವ ಅಧಿಕಾರಿಗಳ ಮೇಲೆ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳಲಾಗುವುದು ಎಂದು ಆಹಾರ ಮತ್ತು ನಾಗರಿಕ ಸರಬರಾಜು, ಗ್ರಾಹಕ ವ್ಯವಹಾರಗಳ ಸಚಿವ ಹಾಗೂ ಬೆಂ.ಗ್ರಾ. ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಚ್.ಮುನಿಯಪ್ಪ ಅವರು ಅಧಿಕಾರಿಗಳಿಗೆ ಎಚ್ಚರಿಕೆ ನೀಡಿದರು.
ಬೆಂಗಳೂರು ಗ್ರಾಮಾಂತರ ಜಿಲ್ಲಾಡಳಿತ ಭವನದಲ್ಲಿ ನಡೆದ ಜಿಲ್ಲಾ ಪಂಚಾಯಿತಿಯ 2022-23 ಹಾಗೂ 2023-24ನೇ ಸಾಲಿನ ಕರ್ನಾಟಕ ಅಭಿವೃದ್ಧಿ ಕಾರ್ಯಕ್ರಮಗಳ ಪ್ರಗತಿ ಪರಿಶೀಲನಾ ಸಭೆ(ಕೆಡಿಪಿ)ಯಲ್ಲಿ ಮಾತನಾಡಿದ ಅವರು, ಮಹಿಳೆಯರು, ಮಕ್ಕಳು, ಯುವಜನರು, ಬಡವರು, ದುರ್ಬಲ ವರ್ಗದವರ ಅಭಿವೃದ್ಧಿಗಾಗಿ ಸರ್ಕಾರ ಹಲವಾರು ಯೋಜನೆಗಳನ್ನು ಜಾರಿಗೊಳಿಸಿದ್ದು ಅಧಿಕಾರಿಗಳು ಜವಾಬ್ದಾರಿಯುತವಾಗಿ ಕಾರ್ಯನಿರ್ವಹಿಸುವ ಮೂಲಕ ಜಿಲ್ಲೆ, ರಾಜ್ಯದ ಅಭಿವೃದ್ಧಿಗೆ ಶ್ರಮಿಸಬೇಕು. ಅಧಿಕಾರಿಗಳು ಸಭೆಗೆ ಕಡ್ಡಾಯವಾಗಿ ಹಾಜರಾಗಿ ತಮ್ಮ ಇಲಾಖೆಗೆ ಸಂಬಂಧಿಸಿದ ಸಮಗ್ರ ಮಾಹಿತಿಯನ್ನು ನೀಡಬೇಕು. ಜನಪ್ರತಿನಿಧಿಗಳು ಕೇಳಿದ ಪ್ರಶ್ನೆಗಳಿಗೆ ಸಮರ್ಪಕ ಉತ್ತರ ಕೊಡಬೇಕು ಎಂದು ಅಧಿಕಾರಿಗಳಿಗೆ ಕಿವಿಮಾತು ಹೇಳಿದರು.
ಸರ್ಕಾರಿ ಶಾಲೆಗಳ ಅಭಿವೃದ್ಧಿಯೇ ಪ್ರತಿಷ್ಠಾನದ ಗುರಿ: ಮಕ್ಕಳ ಕಲಿಕೆಗೆ ಅಗತ್ಯ ಸಲಕರಣೆಗಳ ವಿತರಣೆ
ಕುಡಿವ ನೀರು ಸಮಸ್ಯೆ: ಜಿಲ್ಲೆಯ ಗ್ರಾಮೀಣ ಹಾಗೂ ನಗರ ಪ್ರದೇಶದಲ್ಲಿನ ಕುಡಿಯುವ ನೀರಿನ ಕುರಿತು ಚರ್ಚೆ ನಡೆಸಿದ ಸಚಿವರು ಜಿಲ್ಲೆಯಲ್ಲಿ ಯಾವುದೇ ರೀತಿಯಲ್ಲಿ ಕುಡಿಯುವ ನೀರಿನ ಸಮಸ್ಯೆಯಾಗದಂತೆ ಅಧಿಕಾರಿಗಳು ಕ್ರಮವಹಿಸಬೇಕು. ಹೊಸಕೋಟೆ ಶಾಸಕರು ಹಾಗೂ ನೆಲಮಂಗಲ ಶಾಸಕರು ತಮ್ಮ ಕ್ಷೇತ್ರದ ಕೆಲವು ಭಾಗಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ಇದ್ದು, ತುರ್ತಾಗಿ ಕ್ರಮವಹಿಸುವಂತೆ, ಸ್ಥಗಿತಗೊಂಡಿರುವ ಶುದ್ಧ ಕುಡಿಯುವ ನೀರಿನ ಘಟಕಗಳನ್ನು ಶೀಘ್ರ ಸರಿಪಡಿಸುವಂತೆ ಅಧಿಕಾರಿಗಳಿಗೆ ಸೂಚಿಸಿದರಲ್ಲದೆ ಹದಗೆಟ್ಟಿರುವ ಸಿಸಿ ರಸ್ತೆಗಳನ್ನು ರಸ್ತೆ ಸರಿಪಡಿಸಬೇಕು ಎಂದರು.
ಅಕ್ಕಿ ವಿತರಣೆ ತೊಂದರೆಯಾಗದಂತೆ ನಿಗಾ: ಆಹಾರ ಇಲಾಖೆಯ ಪ್ರಗತಿ ಪರಿಶೀಲನೆ ನಡೆಸಿದ ಸಚಿವರು ಪ್ರಸ್ತುತ 5 ಕೆಜಿ ನೀಡುತ್ತಿದ್ದ ಅಕ್ಕಿಯನ್ನು 10 ಕೆಜಿ ನೀಡಲು ನಿರ್ಧರಿಸಿದ್ದೇವೆ. ಅಕ್ಕಿ ವಿತರಿಸಲು, ಅಕ್ಕಿ ಸಂಗ್ರಹಿಸುವ ಉಗ್ರಾಣ ವ್ಯವಸ್ಥೆಯಲ್ಲಿ ಯಾವುದೇ ತೊಂದರೆ ಆಗದಂತೆ ಕ್ರಮ ವಹಿಸಿ ಎಂದು ಅಧಿಕಾರಿಗಳಿಗೆ ಸೂಚಿಸಿದರಲ್ಲದೆ ನೆಲಮಂಗಲದಲ್ಲಿ ಪ್ಲಾಸ್ಟಿಕ್ ಅಕ್ಕಿ ಎಂದು ಪತ್ತೆಯಾಗಿರುವ ವರದಿಯನ್ನು ಪ್ರಸ್ತಾಪಿಸಿ ಪ್ಲಾಸ್ಟಿಕ್ ಅಕ್ಕಿ ಸಾಮಾನ್ಯವಾಗಿ ಎಲ್ಲೂ ಪತ್ತೆಯಾಗಿಲ್ಲ, ಅಕ್ಕಿಯಲ್ಲಿ ಪೌಷ್ಟಿಕಾಂಶ ಹೆಚ್ಚಿಸಲು ಪ್ರತಿ 100 ಕೆಜಿ ಅಕ್ಕಿಗೆ 01 ಕೆಜಿ ಫೋರ್ಟಿಫೈಡ್ ಅಕ್ಕಿಯನ್ನು ಬೆರೆಸುತ್ತಾರೆ, ನೆಲಮಂಗಲದಲ್ಲಿ ಅದೇ ರೀತಿ ಆಗಿರಬಹುದು ಇದರ ಬಗ್ಗೆ ಪರಿಶೀಲಿಸಿ ಶೀಘ್ರ ವರದಿ ನೀಡಿ ಎಂದು ಅಧಿಕಾರಿಗಳಿಗೆ ಸೂಚಿಸಿದರು.
ಶಾಲೆಗಳು ಪ್ರಾರಂಭದ ಹಿನ್ನಲೆಯಲ್ಲಿ ಲಭ್ಯವಿರುವ ಶಿಕ್ಷಕರು, ಅತಿಥಿ ಶಿಕ್ಷಕರು, ವಿದ್ಯಾರ್ಥಿಗಳ ಮಾಹಿತಿಯನ್ನು ಪಡೆದುಕೊಂಡು ಪ್ರತಿಕ್ರಿಯಿಸಿದ ಸಚಿವರು ಜಿಲ್ಲೆಯಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಕೈಗಾರಿಕೆಗಳು, ಕಂಪನಿಗಳು ಕಾರ್ಯನಿರ್ವಹಿಸುತ್ತಿದ್ದು, ಸಿಎಸ್‌ಆರ್ ಅನುದಾನವನ್ನು ಸರ್ಕಾರಿ ಶಾಲೆಗಳ ಅಭಿವೃದ್ಧಿಗೆ ಹೆಚ್ಚಿನ ಗಮನಹರಿಸಿ ಬಳಸಿಕೊಂಡು ಖಾಸಗಿ ಶಾಲೆಗಳಂತೆಯೇ ಸೌಲಭ್ಯಗಳನ್ನು ಕಲ್ಪಿಸುವ ಮೂಲಕ ಸರ್ಕಾರಿ ಶಾಲೆಗಳಿಗೆ ಮಕ್ಕಳನ್ನು ಕರೆತರಲು ಆಕರ್ಷಿಸಬೇಕು. ಪ್ರತಿ ಮಗುವೂ ಉತ್ತಮ ಶಿಕ್ಷಣ ಸೌಲಭ್ಯ ಪಡೆಯಲು ಕ್ರಮ ವಹಿಸಬೇಕು ಎಂದು ತಿಳಿಸಿದರು.
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಜನರಿಗೆ ಕೃಷಿ, ತೋಟಗಾರಿಕೆ ಇಲಾಖೆಯ ಯೋಜನೆಯ ಕುರಿತು ಮಾಹಿತಿಯ ಕೊರತೆಯಿದ್ದು, ಶಾಸಕರ ನೇತೃತ್ವದಲ್ಲಿ ರೈತರಿಗೆ ಸಂಪನ್ಮೂಲ ವ್ಯಕ್ತಿಗಳಿಂದ ಯೋಜನೆಗಳ ಮಾಹಿತಿ ನೀಡಲು ಕ್ರಮ ವಹಿಸಬೇಕು. ಅವಶ್ಯವಿರುವ ಬಿತ್ತನೆ ಬೀಜ, ರಸಗೊಬ್ಬರ ದಾಸ್ತಾನಿಗೆ ಕ್ರಮ ವಹಿಸಬೇಕು. ನಗರೀಕರಣದಿಂದಾಗಿ ದೇವನಹಳ್ಳಿಯ ಮೂಲ ಚಕೋತಾ, ಮಲ್ಲಿಗೆ ಬೆಳೆ ನಶಿಸುತ್ತಿದ್ದು, ಈ ಬೆಳೆಗಳನ್ನು ಬೆಳೆಯಲು ಉತ್ತೇಜಿಸಬೇಕು. ದ್ರಾಕ್ಷಿ ಬೆಳೆಗಾರರಿಗೆ ಇರುವ ಸೌಲಭ್ಯವನ್ನು ಕಲ್ಪಿಸಬೇಕು ಎಂದು ಹೇಳಿದರು.
ಮನರೇಗಾ ಅನುಷ್ಠಾನಕ್ಕೆ ಕ್ರಮ: ಮಹತ್ಮಾ ಗಾಂಧಿ ನರೇಗಾ ಯೋಜನೆಯಡಿ ಸಮುದಾಯ ಕಾಮಗಾರಿಗಳೊಂದಿಗೆ, ವೈಯಕ್ತಿಕ ಕಾಮಗಾರಿಗಳಿಗೂ ಆದ್ಯತೆ ನೀಡಬೇಕು. ಜಲ ಜೀಲನ್ ಮಿಷನ್ ಯೋಜನೆಯಡಿ ವಿವಿಧ ಕಾಮಗಾರಿಗಳು ಪ್ರಾರಂಭವಾಗಿ ತಿಂಗಳುಗಳು ಕಳೆದರೂ ರಸ್ತೆಗಳನ್ನು ಅಗೆದು ನೀರಿನ ಪೈಪ್ ಅಳವಡಿಸಲಾಗಿದೆ. ರಸ್ತೆಗಳ ದುರಸ್ತಿಗಳಾಗಿಲ್ಲ. ಆದಷ್ಟುಬೇಗ ಕಾಮಗಾರಿಗಳನ್ನು ಪೂರ್ಣಗೊಳಿಸಿ ಸಾರ್ವಜನಿಕರಿಗೆ ಅನುವು ಮಾಡಿಕೊಡಬೇಕು. ಕೆಸಿ ವ್ಯಾಲಿ ನೀರು, ಎಚ್.ಎನ್ ವ್ಯಾಲಿ ನೀರನ್ನು ಮೂರನೇ ಹಂತದ ಶುದ್ಧೀಕರಣ ಮಾಡಿ ಜಿಲ್ಲೆಯ ಕೆರೆಗಳಿಗೆ 5 ವರ್ಷದಲ್ಲಿ ಹಂತ ಹಂತವಾಗಿ ಸರಬರಾಜು ಮಾಡುವ ಯೋಚನೆ ಇದ್ದು ಪ್ರತಿಯೊಂದು ಗ್ರಾಮಕ್ಕೂ ನೀರಿನ ಸೌಲಭ್ಯ ಒದಗಿಸುವುದು ನಮ್ಮ ಜವಾಬ್ದಾರಿ ಆಗಿದೆ ಎಂದರು.
ಟೋಲ್ ದರ ಏರಿಕೆ ಅನ್ಯಾಯದ ಪರಮಾವಧಿ: ಎಚ್.ಡಿ.ಕುಮಾರಸ್ವಾಮಿ
ಜನಪ್ರತಿನಿಧಿಗಳ ಸಹಕಾರದಿಂದೊಂದಿಗೆ ಜಿಲ್ಲೆಯ ಸಮಗ್ರ ಅಭಿವೃದ್ಧಿಗೆ ಪೂರಕವಾಗಿ ಅಧಿಕಾರಿಗಳು ಕಾರ್ಯ ನಿರ್ವಹಿಸಬೇಕು ಎಂದರು. ಸಭೆಯಲ್ಲಿ ಹೊಸಕೋಟೆ ಶಾಸಕ ಶರತ್ ಕುಮಾರ್ ಬಚ್ಚೇಗೌಡ, ನೆಲಮಂಗಲ ಶಾಸಕ ಶ್ರೀನಿವಾಸಯ್ಯ, ವಿಧಾನ ಪರಿಷತ್ ಸದಸ್ಯ ಎಸ್.ರವಿ, ಅ.ದೇವೇಗೌಡ, ಜಿಲ್ಲಾಧಿಕಾರಿ ಆರ್.ಲತಾ, ಜಿಲ್ಲಾ ಪೊಲೀಸ್ ಅಧೀಕ್ಷಕ ಮಲ್ಲಿಕಾರ್ಜುನ ಬಾಲದಂಡಿ, ಜಿಪಂ ಸಿಇಒ ವರ್ಣೀತ್ ನೇಗಿ ಸೇರಿದಂತೆ ವಿವಿಧ ಇಲಾಖೆಗಳ ಜಿಲ್ಲಾ ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.