ಹುಬ್ಬಳ್ಳಿಯಲ್ಲಿ ಕೇಂದ್ರ ಗೃಹ ಸಚಿವ ಅಮಿತ್‌ ಶಾ ಅವರನ್ನು ಬಿ.ವೈ. ವಿಜಯೇಂದ್ರ ಮತ್ತು ಬಿ.ಎಸ್‌. ಯಡಿಯೂರಪ್ಪ ಭೇಟಿಯಾಗಿ ಚರ್ಚಿಸಿದರು. ಈ ವೇಳೆ 'ಬಳ್ಳಾರಿ ಚಲೋ' ಪಾದಯಾತ್ರೆಯ ಮಾಹಿತಿ ಪಡೆದ ಶಾ, ರಾಜ್ಯ ಸರ್ಕಾರದ ವಿರುದ್ಧ ಹೋರಾಟ ತೀವ್ರಗೊಳಿಸಲು ಸೂಚಿಸಿದ್ದಾರೆ.

ಹುಬ್ಬಳ್ಳಿ (ಸೆ.20) ಖಾಸಗಿ ಕಾರ್ಯಕ್ರಮವೊಂದರಲ್ಲಿ ಪಾಲ್ಗೊಳ್ಳಲು ಹುಬ್ಬಳ್ಳಿಗೆ ಆಗಮಿಸಿದ್ದ ಕೇಂದ್ರ ಗೃಹ ಸಚಿವ ಅಮಿತ್‌ ಶಾ ಅವರನ್ನು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಹಾಗೂ ಮಾಜಿ ಮುಖ್ಯಮಂತ್ರಿ ಬಿ.ಎಸ್‌. ಯಡಿಯೂರಪ್ಪ ಅವರು ಶನಿವಾರ ಬೆಳಗ್ಗೆ ನಗರದಲ್ಲಿ ಭೇಟಿಯಾಗಿ ಕೆಲಕಾಲ ಚರ್ಚೆ ನಡೆಸಿದರು. ಈ ವೇಳೆ ರಾಜ್ಯ ಸರ್ಕಾರದ ವಿರುದ್ಧದ ಹೋರಾಟವನ್ನು ತೀವ್ರಗೊಳಿಸುವಂತೆ ಅಮಿತ್‌ ಶಾ ಸೂಚಿಸಿದ್ದಾರೆ.

ಅಮಿತ್‌ ಶಾಗೆ ಬಳ್ಳಾರಿ ಪಾದಯಾತ್ರೆ ವಿವರ ನೀಡಿದ ವಿಜಯೇಂದ್ರ

ವಾಲ್ಮೀಕಿ ನಿಗಮದಲ್ಲಿನ ಹಗರಣದ ಹಣ ವಾಪಸ್‌ಗೆ ಆಗ್ರಹಿಸಿ ಇತ್ತೀಚೆಗೆ ರಾಯಚೂರು ಜಿಲ್ಲೆ ಲಿಂಗಸುಗೂರಿನಿಂದ ಬಳ್ಳಾರಿವರೆಗೆ ನಡೆಸಲಾದ ಪಾದಯಾತ್ರೆಯ ವಿವರಗಳು, ಪಕ್ಷದಲ್ಲಿನ ಚಟುವಟಿಕೆಗಳ ಮಾಹಿತಿಯನ್ನು ಅಮಿತ್‌ ಶಾ ಅವರಿಗೆ ವಿಜಯೇಂದ್ರ ಅವರು ನೀಡಿದರು. ಈ ವಿಷಯವನ್ನು ಸ್ವತಃ ವಿಜಯೇಂದ್ರ ಅವರು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ.

ಕಾಂಗ್ರೆಸ್ ಸರ್ಕಾರದ ವಿರುದ್ಧ ಹೋರಾಟ ಇನ್ನಷ್ಟು ತೀವ್ರ

ರಾಜ್ಯದಲ್ಲಿನ ಪಕ್ಷದ ಚಟುವಟಿಕೆ, ಇತ್ತೀಚೆಗೆ ನಡೆದ ‘ಬಳ್ಳಾರಿ ಚಲೋ’ ಪಾದಯಾತ್ರೆ, ಅದರಿಂದಾದ ಪರಿಣಾಮಗಳ ಬಗ್ಗೆ ಅಮಿತ್‌ ಶಾ ಅವರಿಗೆ ಮಾಹಿತಿ ನೀಡಲಾಯಿತು. ಪಾದಯಾತ್ರೆಯ ಸಮಾರೋಪ ಸಮಾರಂಭದ ಜಾಗ ನಿಗದಿಪಡಿಸುವ ಕುರಿತು ಸರ್ಕಾರ ಮಾಡಿದ ಕಿರಿಕಿರಿ ಬಗ್ಗೆ ವಿವರಿಸಿದಾಗ, ರಾಜ್ಯದ ಕಾಂಗ್ರೆಸ್‌ ಸರ್ಕಾರದ ವಿರುದ್ಧ ಹೋರಾಟವನ್ನು ಇನ್ನಷ್ಟು ತೀವ್ರಗೊಳಿಸುವಂತೆ ಅಮಿತ್‌ ಶಾ ಅವರು ಮಾರ್ಗದರ್ಶನ ನೀಡಿದರು. ಜತೆಗೆ, ಕೆಲ ಸಲಹೆ-ಸೂಚನೆ ನೀಡಿದರು ಎಂದು ವಿಜಯೇಂದ್ರ ಅವರು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ.