ಸುಪ್ರೀಂ ಕೋರ್ಟ್ ಆದೇಶದ ಪ್ರಕಾರ ಸ್ಥಳೀಯ ಸಂಸ್ಥೆಗಳ ಚುನಾವಣೆಯನ್ನು ಬ್ಯಾಲೆಟ್ ಮೂಲಕ ಮಾಡಬೇಕೇ ಅಥವಾ ಇವಿಎಂ ಮೂಲಕ ಮಾಡಬೇಕೇ ಎಂಬುದು ರಾಜ್ಯ ಸರ್ಕಾರಕ್ಕೆ ಬಿಟ್ಟ ವಿಷಯ. ಹೀಗಾಗಿ ರಾಜ್ಯ ಸರ್ಕಾರ ಶಿಫಾರಸು ಮಾಡಿದಂತೆ ಚುನಾವಣಾ ಆಯೋಗ ಮಾಡಬೇಕಾಗುತ್ತದೆ.
ಬೆಂಗಳೂರು (ಸೆ.19): ಸ್ಥಳೀಯ ಸಂಸ್ಥೆಗಳಲ್ಲಿ ಇವಿಎಂ ಬದಲಿಗೆ ಬ್ಯಾಲೆಟ್ ಪತ್ರ ಬಳಕೆಗೆ ಸುಗ್ರೀವಾಜ್ಞೆ ಹೊರಡಿಸುವ ಅಗತ್ಯವಿಲ್ಲ ಎಂಬ ನಿಲುವು ನಡೆದ ಸಚಿವ ಸಂಪುಟ ಸಭೆಯಲ್ಲಿ ವ್ಯಕ್ತವಾಗಿರುವುದಾಗಿ ತಿಳಿದುಬಂದಿದೆ. ಸೆ.4ರ ಸಂಪುಟ ಸಭೆ ನಿರ್ಣಯದಂತೆ ಜಿಬಿಎ, ಪಂಚಾಯತಿಗಳು ಹಾಗೂ ನಗರ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಇವಿಎಂ ಬದಲಿಗೆ ಬ್ಯಾಲೆಟ್ ಪೇಪರ್ ಬಳಸುವಂತೆ ರಾಜ್ಯ ಚುನಾವಣಾ ಆಯೋಗಕ್ಕೆ ಶನಿವಾರ ಶಿಫಾರಸು ಕಳುಹಿಸಿಕೊಡಲಾಗಿದೆ. ಇದಕ್ಕೆ ಪೂರಕವಾಗಿ ಕರ್ನಾಟಕ ಗ್ರಾಮ ಸ್ವರಾಜ್ ಮತ್ತು ಪಂಚಾಯತ್ ರಾಜ್, ಗ್ರೇಟರ್ ಬೆಂಗಳೂರು ಪ್ರಾಧಿಕಾರ ಕಾಯಿದೆ-2024, ಕರ್ನಾಟಕ ಮುನ್ಸಿಪಾಲಿಟಿಗಳ ಕಾಯಿದೆ ಸೇರಿ ಮೂರು ಕಾಯಿದೆಗಳಿಗೆ ತಿದ್ದುಪಡಿ ತರಲು ಸರ್ಕಾರ ಚಿಂತನೆ ನಡೆಸಿತ್ತು.
ಆದರೆ ಸುಪ್ರೀಂ ಕೋರ್ಟ್ ಆದೇಶದ ಪ್ರಕಾರ ಸ್ಥಳೀಯ ಸಂಸ್ಥೆಗಳ ಚುನಾವಣೆಯನ್ನು ಬ್ಯಾಲೆಟ್ ಮೂಲಕ ಮಾಡಬೇಕೇ ಅಥವಾ ಇವಿಎಂ ಮೂಲಕ ಮಾಡಬೇಕೇ ಎಂಬುದು ರಾಜ್ಯ ಸರ್ಕಾರಕ್ಕೆ ಬಿಟ್ಟ ವಿಷಯ. ಹೀಗಾಗಿ ರಾಜ್ಯ ಸರ್ಕಾರ ಶಿಫಾರಸು ಮಾಡಿದಂತೆ ಚುನಾವಣಾ ಆಯೋಗ ಮಾಡಬೇಕಾಗುತ್ತದೆ. ಹೀಗಾಗಿ ಇದಕ್ಕೆ ಪ್ರತ್ಯೇಕವಾಗಿ ಸುಗ್ರೀವಾಜ್ಞೆಯ ಅಗತ್ಯವಿಲ್ಲ ಎಂದು ಸಂಪುಟದಲ್ಲಿ ಚರ್ಚಿಸಲಾಗಿದೆ ಎಂದು ಮೂಲಗಳು ತಿಳಿಸಿವೆ. ಸಭೆ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವ ಎಚ್.ಕೆ.ಪಾಟೀಲ್, ಸುಗ್ರೀವಾಜ್ಞೆ ಅಗತ್ಯವಿಲ್ಲ ಎಂಬ ಅಭಿಪ್ರಾಯ ವ್ಯಕ್ತವಾಗಿದೆ. ಆದಾಗ್ಯೂ ಮತ್ತೊಮ್ಮೆ ಕಾನೂನು ತಜ್ಞರೊಂದಿಗೆ ಚರ್ಚಿಸಿ ಮುಂದಿನ ನಿರ್ಧಾರ ಮಾಡಲಾಗುವುದು ಎಂದು ಹೇಳಿದರು.
ಸುಗ್ರೀವಾಜ್ಞೆಗೆ ಸಿದ್ಧತೆ
ಸ್ಥಳೀಯ ಸಂಸ್ಥೆಗಳ ಚುನಾವಣೆಗೆ ಇವಿಎಂ ಬದಲು ಮತಪತ್ರ (ಬ್ಯಾಲೆಟ್) ಬಳಕೆ ಸಂಬಂಧಿಸಿ ಸೆ.11ರಂದು ನಡೆಯಲಿರುವ ಸಚಿವ ಸಂಪುಟ ಸಭೆಯಲ್ಲಿ ಮೂರು ಕಾಯಿದೆಗಳಿಗೆ ತಿದ್ದುಪಡಿ ಮಾಡಿ ಸುಗ್ರೀವಾಜ್ಞೆ ಹೊರಡಿಸಲು ರಾಜ್ಯ ಸರ್ಕಾರ ಸಿದ್ಧತೆ ನಡೆಸಿದೆ. ಸೆ.4ರ ಸಂಪುಟ ಸಭೆ ನಿರ್ಣಯದಂತೆ ಜಿಬಿಎ, ಪಂಚಾಯತಿಗಳು ಹಾಗೂ ನಗರ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಇವಿಎಂ ಬದಲಿಗೆ ಬ್ಯಾಲೆಟ್ ಪೇಪರ್ ಬಳಸುವಂತೆ ರಾಜ್ಯ ಚುನಾವಣಾ ಆಯೋಗಕ್ಕೆ ಶಿಫಾರಸು ಕಳುಹಿಸಿಕೊಡಲಾಗಿದೆ. ಇದಕ್ಕೆ ಪೂರಕವಾಗಿ ಕರ್ನಾಟಕ ಗ್ರಾಮ ಸ್ವರಾಜ್ ಮತ್ತು ಪಂಚಾಯತ್ ರಾಜ್, ಗ್ರೇಟರ್ ಬೆಂಗಳೂರು ಪ್ರಾಧಿಕಾರ ಕಾಯಿದೆ-2024, ಕರ್ನಾಟಕ ಮುನ್ಸಿಪಾಲಿಟಿಗಳ ಕಾಯಿದೆ ಸೇರಿ ಮೂರು ಕಾಯಿದೆಗಳಿಗೆ ತಿದ್ದುಪಡಿ ತರಬೇಕಾಗಿದೆ. ಈ ಕುರಿತು ಸೆ.11ರ ಸಂಪುಟ ಸಭೆಯಲ್ಲಿ ತೀರ್ಮಾನಿಸುವುದಾಗಿ ಮೂಲಗಳು ತಿಳಿಸಿವೆ.
ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಮತಪತ್ರ ಬಳಕೆಗೆ (ಬ್ಯಾಲೆಟ್ ಪೇಪರ್) ಬಳಕೆಗೆ ಕಾನೂನಲ್ಲೇ ಅವಕಾಶ ಇರುವಾಗ ಈ ವಿಚಾರವಾಗಿ ಮತ್ತೆ ಚರ್ಚೆ ಮಾಡುವ ಅಗತ್ಯವೇನಿದೆ. ಮೊದಲು ವಾರ್ಡ್ ಮರುವಿಂಗಡಣೆ ನಂತರ ಆಯೋಗಕ್ಕೆ ಸೂಚನೆ ನೀಡಲಾಗುವುದು.
-ಡಿ.ಕೆ.ಶಿವಕುಮಾರ್, ಡಿಸಿಎಂ
