ಬೆಂಗಳೂರಿನಲ್ಲಿ ಸುಮಾರು 2 ಲಕ್ಷಕ್ಕೂ ಅಧಿಕ ಅಕ್ರಮ ಬಾಂಗ್ಲಾ ವಲಸಿಗರು ನೆಲೆಸಿದ್ದಾರೆ ಎಂದು ಶಂಕಿಸಲಾಗಿದೆ. ನಕಲಿ ದಾಖಲೆಗಳನ್ನು ಪಡೆದು ಅಪರಾಧ ಕೃತ್ಯಗಳಲ್ಲಿ ಭಾಗಿಯಾಗುತ್ತಿರುವ ಇವರನ್ನು ಪತ್ತೆ ಹಚ್ಚಿ ಗಡೀಪಾರು ಮಾಡಲು ವಿಶೇಷ ಟಾಸ್ಕ್ ಫೋರ್ಸ್ ರಚಿಸಬೇಕೆಂದು ವಿಪಕ್ಷ ನಾಯಕ ಆರ್. ಅಶೋಕ್ ಆಗ್ರಹಿಸಿದ್ದಾರೆ

ಬೆಂಗಳೂರು (ಜ.14): ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಅಕ್ರಮ ಬಾಂಗ್ಲಾದೇಶಿ ವಲಸಿಗರ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚುತ್ತಿದ್ದು, ಇದು ರಾಜ್ಯದ ಭದ್ರತೆಗೆ ದೊಡ್ಡ ಸವಾಲಾಗಿ ಪರಿಣಮಿಸಿದೆ. ಇದೀಗ ಬೆಂಗಳೂರು ನಗರದಲ್ಲಿಯೇ ಸುಮಾರು 2 ಲಕ್ಷಕ್ಕೂ ಅಧಿಕ ಅಕ್ರಮ ಬಾಂಗ್ಲಾ ಪ್ರಜೆಗಳು ನೆಲೆಸಿರುವ ಶಂಕೆ ವ್ಯಕ್ತವಾಗಿದ್ದು, ಈ ಬಗ್ಗೆ ರಾಜ್ಯ ಸರ್ಕಾರ ತಕ್ಷಣ ಎಚ್ಚೆತ್ತುಕೊಳ್ಳಬೇಕು ಎಂದು ವಿರೋಧ ಪಕ್ಷದ ನಾಯಕ ಆರ್. ಅಶೋಕ್ ಆಗ್ರಹಿಸಿದ್ದಾರೆ.

71 ಶಂಕಿತರ ವಶ; ಸ್ವತಃ ವಲಸಿಗರಿಂದಲೇ ಮಾಹಿತಿ

ಸಾಮಾಜಿಕ ಜಾಲತಾಣದಲ್ಲಿ ಮಾಹಿತಿ ಹಂಚಿಕೊಂಡಿರುವ ಅವರು, ಕಳೆದ ಒಂದು ವಾರದಿಂದ ಬೆಂಗಳೂರು ಪೊಲೀಸರು ನಗರದ ವಿವಿಧೆಡೆ ನಡೆಸಿದ ವಿಶೇಷ ಕಾರ್ಯಾಚರಣೆಯಲ್ಲಿ ಇದುವರೆಗೆ 71 ಶಂಕಿತ ಬಾಂಗ್ಲಾ ಪ್ರಜೆಗಳನ್ನು ವಶಕ್ಕೆ ಪಡೆಯಲಾಗಿದೆ. ಆಘಾತಕಾರಿ ವಿಷಯವೆಂದರೆ, ವಿಚಾರಣೆಯ ವೇಳೆ ಬೆಂಗಳೂರಿನಲ್ಲಿ ಸುಮಾರು 2 ಲಕ್ಷಕ್ಕೂ ಅಧಿಕ ಅಕ್ರಮ ವಲಸಿಗರು ವಿವಿಧ ಸ್ಲಂಗಳು ಹಾಗೂ ಕಟ್ಟಡ ನಿರ್ಮಾಣ ಪ್ರದೇಶಗಳಲ್ಲಿ ಅಡಗಿಕೊಂಡಿದ್ದಾರೆ ಎಂದು ಸ್ವತಃ ವಲಸಿಗರೇ ಒಪ್ಪಿಕೊಳ್ಳುತ್ತಿದ್ದಾರೆ ಎನ್ನಲಾಗಿದೆ.

ನಕಲಿ ದಾಖಲೆಗಳ ಹಾವಳಿ

ಈ ಅಕ್ರಮ ನುಸುಳುಕೋರರು ಕೇವಲ ನೆಲೆಸುತ್ತಿಲ್ಲ, ಬದಲಾಗಿ ಸ್ಥಳೀಯ ದಲ್ಲಾಳಿಗಳ ಸಹಾಯದೊಂದಿಗೆ ನಕಲಿ ಆಧಾರ್ ಕಾರ್ಡ್, ರೇಷನ್ ಕಾರ್ಡ್ ಮತ್ತು ಪಾಸ್‌ಪೋರ್ಟ್‌ಗಳನ್ನು ಸಹ ಪಡೆದುಕೊಳ್ಳುತ್ತಿದ್ದಾರೆ. ಇಂತಹ ನಕಲಿ ದಾಖಲೆಗಳನ್ನು ಬಳಸಿಕೊಂಡು ಮಾನವ ಕಳ್ಳಸಾಗಣೆಯಂತಹ ಗಂಭೀರ ಅಪರಾಧ ಪ್ರಕರಣಗಳಲ್ಲಿ ಭಾಗಿಯಾಗುತ್ತಿದ್ದಾರೆ. ಅಲ್ಲದೆ, ಕಾನೂನಿನ ಕಣ್ಣಿಗೆ ಮಣ್ಣೆರಚಿ ಧೈರ್ಯವಾಗಿ ನ್ಯಾಯಾಲಯಗಳಲ್ಲಿ ಜಾಮೀನು ಕೋರುತ್ತಿರುವುದು ಅತ್ಯಂತ ಕಳವಳಕಾರಿ ಬೆಳವಣಿಗೆಯಾಗಿದೆ.

ಗೃಹ ಸಚಿವರಿಗೆ ಪತ್ರದ ಮೂಲಕ ಆಗ್ರಹ

ಈ ಬೆಳವಣಿಗೆಯ ಬಗ್ಗೆ ಸಾರ್ವಜನಿಕರು ಮತ್ತು ಸಾಮಾಜಿಕ ಕಾರ್ಯಕರ್ತರು ಗೃಹ ಸಚಿವ ಡಾ. ಜಿ. ಪರಮೇಶ್ವರ್ ಅವರಿಗೆ ನೇರ ಪ್ರಶ್ನೆ ಹಾಕಿದ್ದಾರೆ. 'ಪರಿಸ್ಥಿತಿ ಹೀಗೆಯೇ ಮುಂದುವರೆದರೆ ರಾಜ್ಯದ ಶಾಂತಿ, ಸಾಮಾಜಿಕ ಸೌಹಾರ್ದತೆ ಮತ್ತು ಕಾನೂನು ಸುವ್ಯವಸ್ಥೆ ಸಂಪೂರ್ಣವಾಗಿ ಹದಗೆಡಲಿದೆ. ವೋಟ್ ಬ್ಯಾಂಕ್ ರಾಜಕಾರಣ ಅಥವಾ ತುಷ್ಟೀಕರಣಕ್ಕಾಗಿ ರಾಜ್ಯದ ಹಿತವನ್ನು ಬಲಿ ಕೊಡಬಾರದು' ಎಂದು ಸಾಮಾಜಿಕ ಜಾಲತಾಣಗಳಲ್ಲಿ ಆಕ್ರೋಶ ವ್ಯಕ್ತವಾಗುತ್ತಿದೆ.

ವಿಶೇಷ ಟಾಸ್ಕ್ ಫೋರ್ಸ್‌ಗೆ ಬೇಡಿಕೆ

ಬೆಂಗಳೂರು ಮತ್ತು ಸುತ್ತಮುತ್ತಲಿನ ಜಿಲ್ಲೆಗಳಲ್ಲಿ ಅಕ್ರಮವಾಗಿ ನೆಲೆಸಿರುವವರನ್ನು ಪತ್ತೆ ಹಚ್ಚಿ ಗಡೀಪಾರು ಮಾಡಲು ರಾಜ್ಯ ಸರ್ಕಾರ ಒಂದು 'ವಿಶೇಷ ಟಾಸ್ಕ್ ಫೋರ್ಸ್' (Special Task Force) ರಚಿಸಬೇಕು ಎಂದು ಒತ್ತಾಯಿಸಲಾಗಿದೆ. ತ್ವರಿತವಾಗಿ ಮನೆ-ಮನೆ ಸಮೀಕ್ಷೆ ನಡೆಸಿ ಅಕ್ರಮ ದಾಖಲೆ ಹೊಂದಿರುವವರ ವಿರುದ್ಧ ಕಠಿಣ ಕಾನೂನು ಕ್ರಮ ಜರುಗಿಸದಿದ್ದರೆ ಭವಿಷ್ಯದಲ್ಲಿ ನಗರದ ಸುರಕ್ಷತೆಗೆ ದೊಡ್ಡ ಅಪಾಯ ಕಾದಿದೆ ಎಂಬ ಎಚ್ಚರಿಕೆ ನೀಡಲಾಗಿದೆ.