ಮಾಜಿ ಶಾಸಕ ನೆ.ಲ.ನರೇಂದ್ರಬಾಬು ಅವರು ಬಿಜೆಪಿಯ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದಾರೆ. ಪಕ್ಷದಲ್ಲಿ ಅಲ್ಪಸಂಖ್ಯಾತರು, ಒಬಿಸಿಗಳಿಗೆ ನೆಲೆಯಿಲ್ಲ ಮತ್ತು ತಮ್ಮನ್ನು ನಿರ್ಲಕ್ಷಿಸಲಾಗಿದೆ ಎಂದು ಆರೋಪಿಸಿರುವ ಅವರು, ಭಾನುವಾರ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾಗುವುದಾಗಿ ಘೋಷಿಸಿದ್ದಾರೆ.
ಬೆಂಗಳೂರು: ಮಾಜಿ ಶಾಸಕ ನೆ.ಲ.ನರೇಂದ್ರಬಾಬು ಬಿಜೆಪಿಯ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದು, ಭಾನುವಾರ ಕಾಂಗ್ರೆಸ್ ಪಕ್ಷ ಸೇರ್ಪಡೆಯಾಗಲಿದ್ದಾರೆ. ಶುಕ್ರವಾರ ಪತ್ರಿಕಾಗೋಷ್ಠಿ ಉದ್ದೇಶಿಸಿ ಮಾತನಾಡಿದ ಅವರು, ಬಿಜೆಪಿ ತಂದೆ ಮಕ್ಕಳ ಪಕ್ಷವಾಗಿದೆ. ಅಲ್ಪಸಂಖ್ಯಾತರು, ಒಬಿಸಿಗಳಿಗೆ ನೆಲ ಇಲ್ಲದ ಕಾರಣ ನಾನು ಬಿಜೆಪಿಗೆ ರಾಜೀನಾಮೆ ನೀಡಿದ್ದೇನೆ. ಸೆ.13 ರಂದು ಸಿಎಂ ಡಿ.ಕೆ. ಶಿವಕುಮಾರ್, ಕೆಪಿಸಿಸಿ ಅಧ್ಯಕ್ಷ ಬಿ.ಕೆ. ಹರಿಪ್ರಸಾದ್ ಸಮ್ಮುಖದಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾಗುತ್ತೇನೆ ಎಂದು ತಿಳಿಸಿದರು.
ಮಾಜಿ ಶಾಸಕ ನರೇಂದ್ರ ಬಾಬು ರಾಜೀನಾಮೆ, ಕಾಂಗ್ರೆಸ್‌ಗೆ ವಾಪಸ್
ಮಹಾನಗರ ಪಾಲಿಕೆ ಸದಸ್ಯನಾಗಿ 3 ಬಾರಿ ಮತ್ತು 2 ಬಾರಿ ಶಾಸಕನಾಗಿ ಕಳೆದ 40 ವರ್ಷಗಳಿಂದ ಸಾರ್ವಜನಿಕರ ಬೆಂಬಲದಿಂದ ರಾಜಕೀಯ ಕ್ಷೇತ್ರದಲ್ಲಿ ಸೇವೆ ಸಲ್ಲಿಸುತ್ತಾ ಬಂದಿದ್ದೇನೆ. ಕಳೆದ 10 ವರ್ಷಗಳಿಂದ ಬಿಜೆಪಿ ಪಕ್ಷಕ್ಕೆ ನನ್ನನ್ನು ಸಮರ್ಪಿಸಿಕೊಂಡೆ. ಆದರೆ ರಾಜಾಜಿನಗರ ಮತ್ತು ಮಹಾಲಕ್ಷ್ಮಿ ಲೇಔಟ್ ವಿಧಾನಸಭಾ ಕ್ಷೇತ್ರದಲ್ಲಿ ನನ್ನ ಕಾರ್ಯಕರ್ತರನ್ನು ನನ್ನಿಂದ ದೂರಮಾಡಿದರು. ನನ್ನ ವಿರುದ್ಧ ಪಿತೂರಿ ಮಾಡಿದವರ ಮೇಲೆ ಕ್ರಮ ಕೈಗೊಳ್ಳಲಿಲ್ಲ ಎಂದು ಅಸಮಾಧಾನ ಹೊರಹಾಕಿದರು.
ರಾಜಾಜಿನಗರ ಕ್ಷೇತ್ರದ ಶಾಸಕ ಎಸ್.ಸುರೇಶ್ ಕುಮಾರ್, ಮಹಾಲಕ್ಷ್ಮಿ ಲೇಔಟ್ ಕ್ಷೇತ್ರದ ಶಾಸಕ ಕೆ. ಗೋಪಾಲಯ್ಯ ಪರ ಚುನಾವಣೆಯಲ್ಲಿ ಪ್ರಾಮಾಣಿಕವಾಗಿ ಕೆಲಸ ಮಾಡಿದರೂ ನನ್ನನ್ನು ನಿರ್ಲಕ್ಷಿಸಿದರು. ಗೋಪಾಲಯ್ಯ ಸೇರಿದಂತೆ 17 ಮಂದಿ ಶಾಸಕರು ಬಿಜೆಪಿ ಸೇರಿದಾಗ ಮಹಾಲಕ್ಷ್ಮಿ ಲೇಔಟ್ ಕ್ಷೇತ್ರದ ಉಪ ಚುನಾವಣೆಯಲ್ಲಿ ರಾಜ್ಯದಲ್ಲಿ ಬಿಜೆಪಿ ಅಧಿಕಾರಕ್ಕೆ ಬರಲು ಉಪ ಚುನಾವಣೆಯಲ್ಲಿ ನೀವು ಸಹಕಾರ ನೀಡಬೇಕೆಂದು ಆಗಿನ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಹಾಗೂ ಸಂಘಟನಾ ಪ್ರಧಾನಕಾರ್ಯದರ್ಶಿ ಬಿ.ಎಲ್.ಸಂತೋಷ್ ನನ್ನನ್ನು ಮನವೊಲಿಸಿದರು. ಪಕ್ಷಕ್ಕಾಗಿ ತ್ಯಾಗ ಮಾಡಿದ ನಂತರ ಜವಾಬ್ದಾರಿ ನೀಡುವ ವಿಚಾರದಲ್ಲಿ ಬಿಜೆಪಿ ನಾಯಕರು ಜಾಣ ಕುರುಡು ವಹಿಸಿದರು. ಕೆಲಸ ಮಾಡುವವರಿಗೆ ಬಿಜೆಪಿ ಪಕ್ಷದಲ್ಲಿ ಬೆಲೆಯಿಲ್ಲ ಎಂದು ಕಿಡಿಕಾರಿದರು.



