ಸಿದ್ದು ಎದುರು ಬೀಳಗಿ ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿ ಶಕ್ತಿ ಪ್ರದರ್ಶನ
ಬಾಗಲಕೋಟೆ ಜಿಲ್ಲೆಯ ಬೀಳಗಿ ವಿಧಾನಸಭಾ ಕ್ಷೇತ್ರದಿಂದ ಟಿಕೆಟ್ ಆಕಾಂಕ್ಷಿ ಬಸವರಾಜ ಖೋತ ಅವರು ತಮ್ಮ ನೂರಾರು ಬೆಂಬಲಿಗರೊಂದಿಗೆ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಅವರ ಅಧಿಕೃತ ನಿವಾಸಕ್ಕೆ ಆಗಮಿಸಿ ಶಕ್ತಿ ಪ್ರದರ್ಶನ ಮಾಡಿದರು.
ಬೆಂಗಳೂರು(ನ.24): ಮುಂಬರುವ ವಿಧಾನಸಭಾ ಚುನಾವಣೆಗೆ ಕಾಂಗ್ರೆಸ್ ಟಿಕೆಟ್‌ಗೆ ಅರ್ಜಿ ಸಲ್ಲಿಸಲು ಅಂತಿಮ ಗಡುವು ಮುಗಿದ ಬೆನ್ನಲ್ಲೇ ಟಿಕೆಟ್‌ಗಾಗಿ ಅರ್ಜಿ ಸಲ್ಲಿಸಿದ ಆಕಾಂಕ್ಷಿಗಳು ಟಿಕೆಟ್ ಗಿಟ್ಟಿಸಲು ಪ್ರಭಾವ ಬೀರುವ ಹಾಗೂ ಶಕ್ತಿ ಪ್ರದರ್ಶನ ಮಾಡುವ ಪ್ರಯತ್ನ ಆರಂಭಿಸಿದ್ದಾರೆ.
ಬುಧವಾರ ಬೆಳಗ್ಗೆ ಬಾಗಲಕೋಟೆ ಜಿಲ್ಲೆಯ ಬೀಳಗಿ ವಿಧಾನಸಭಾ ಕ್ಷೇತ್ರದಿಂದ ಟಿಕೆಟ್ ಆಕಾಂಕ್ಷಿ ಬಸವರಾಜ ಖೋತ ಅವರು ತಮ್ಮ ನೂರಾರು ಬೆಂಬಲಿಗರೊಂದಿಗೆ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಅವರ ಅಧಿಕೃತ ನಿವಾಸಕ್ಕೆ ಆಗಮಿಸಿ ಶಕ್ತಿ ಪ್ರದರ್ಶನ ಮಾಡಿದರು. ಕೈಗಾರಿಕಾ ಸಚಿವ ಮುರುಗೇಶ್ ನಿರಾಣಿ ಪ್ರತಿನಿಧಿಸುತ್ತಿರುವ ಕ್ಷೇತ್ರದಿಂದ ಸ್ಪರ್ಧಿಸುವ ಆಕಾಂಕ್ಷೆಯಿಂದ ಕಾಂಗ್ರೆಸ್ ಟಿಕೆಟ್‌ಗಾಗಿ ಹಲವರು ಅರ್ಜಿ ಸಲ್ಲಿಸಿದ್ದಾರೆ. ಹೀಗಾಗಿ ಮುಂಬರುವ ದಿನಗಳಲ್ಲಿ ಟಿಕೆಟ್‌ಗಾಗಿ ಪ್ರಬಲ ಪೈಪೋಟಿ ಏರ್ಪಡುವ ಸಾಧ್ಯತೆ ಇರುವುದರಿಂದ ಬುಧವಾರವೇ ಬೆಂಬಲಿಗರೊಂದಿಗೆ ಆಗಮಿಸಿದ ಬಸವರಾಜ್ ಟಿಕೆಟ್‌ಗೆ ಪ್ರಯತ್ನ ನಡೆಸಿದರು.
KARNATAKA ASSEMBLY ELECTION 2023: ಬಾಗಲಕೋಟೆಯಲ್ಲಿ ಹಾಲಿ, ಮಾಜಿ ಘಟಾನುಘಟಿಗಳ ನಡುವೆ ಸಮರ..!
ವಿಧಾನಸಭೆ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಅವರು ಬಾದಾಮಿಯ ಹಾಲಿ ಶಾಸಕರಾಗಿದ್ದು, ಬಾಗಲಕೋಟೆ ಜಿಲ್ಲೆಯ ಪ್ರತಿನಿಧಿ ಆಗಿದ್ದಾರೆ. ಶಾಸಕಾಂಗ ಪಕ್ಷದ ನಾಯಕರು ಆಗಿರುವ ಹಿನ್ನೆಲೆಯಲ್ಲಿ ಅವರನ್ನು ಭೇಟಿ ಮಾಡಿ ಟಿಕೆಟ್‌ಗೆ ಪ್ರಯತ್ನ ನಡೆಸಿದ್ದಾರೆ. ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ದೆಹಲಿಯಲ್ಲಿರುವ ಪ್ರತಿಪಕ್ಷ ನಾಯಕರನ್ನು ಮಾತ್ರ ಭೇಟಿ ಮಾಡಿ ತೆರಳಿದ್ದಾರೆ ಎಂದು ಮೂಲಗಳು ತಿಳಿಸಿವೆ.
ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕ್ಷೇತ್ರದಲ್ಲಿ ಸಾಕಷ್ಟು ಆಕಾಂಕ್ಷಿಗಳಿದ್ದಾರೆ. ಪಕ್ಷದಿಂದ ನನಗೆ ಟಿಕೆಟ್ ಸಿಗುವ ನಿರೀಕ್ಷೆಯಿದೆ. ಆದರೂ ನನ್ನ ಪ್ರಯತ್ನವಾಗಿ ಪ್ರತಿಪಕ್ಷ ನಾಯಕರನ್ನು ಭೇಟಿಯಾಗಿ ಮನವಿ ಮಾಡಲು ಬಂದಿದ್ದೇನೆ ಎಂದರು.