ಪಕ್ಷದ ಪ್ರಮುಖರು ಎಲ್ಲ ಜಿಲ್ಲೆಗಳಿಗೆ ತೆರಳಿ ಜಿಲ್ಲೆಯ ಎಲ್ಲಾ ಪ್ರಮುಖರಿಂದ ಅಭಿಪ್ರಾಯ ಸಂಗ್ರಹಿಸಿ ಜಿಲ್ಲಾಧ್ಯಕ್ಷರು, ಜಿಲ್ಲಾ ಪದಾಧಿಕಾರಿಗಳನ್ನು ಆಯ್ಕೆ ಮಾಡಲಿದ್ದಾರೆ. ಎಲ್ಲರ ಅಭಿಪ್ರಾಯದೊಂದಿಗೆ ಪಕ್ಷವನ್ನು ಮುನ್ನಡೆಸುವ ತೀರ್ಮಾನ ರಾಜ್ಯಾಧ್ಯಕ್ಷರದ್ದಾಗಿದೆ: ರಾಜ್ಯ ಪ್ರಧಾನ ಕಾರ್ಯದರ್ಶಿ ಪಿ.ರಾಜೀವ್‌ 

ಬೆಂಗಳೂರು(ಡಿ.27): ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರ ನೇತೃತ್ವದ ರಾಜ್ಯ ಪದಾಧಿಕಾರಿಗಳ ತಂಡದ ಮೊದಲ ಸಭೆ ಬುಧವಾರ ನಡೆಯಲಿದೆ. ಪಕ್ಷ ಸಂಘಟನೆ, ಜಿಲ್ಲಾಧ್ಯಕ್ಷರು ಹಾಗೂ ಜಿಲ್ಲಾ ಪದಾಧಿಕಾರಿಗಳ ಆಯ್ಕೆ ಸಂಬಂಧ ಈ ಸಭೆ ನಡೆಯಲಿದೆ. ಮೊದಲ ಹಂತವಾಗಿ ಬುಧವಾರ ಬೆಳಿಗ್ಗೆ 10 ಗಂಟೆಗೆ ಪದಾಧಿಕಾರಿಗಳ ಸಭೆ ಮತ್ತು ಉದ್ಘಾಟನೆ ನಡೆಯಲಿದೆ. ಮಧ್ಯಾಹ್ನ 2 ಗಂಟೆಗೆ ಜಿಲ್ಲಾ ಮಟ್ಟದಲ್ಲಿ ಜಿಲ್ಲಾಧ್ಯಕ್ಷರು ಮತ್ತು ಜಿಲ್ಲಾ ಪದಾಧಿಕಾರಿಗಳ ಆಯ್ಕೆ ಪ್ರಕ್ರಿಯೆಗೆ ಚಾಲನೆ ನೀಡುವ ಸಭೆ ನಡೆಯಲಿದೆ. 

Add Asianetnews Kannada as a Preferred SourcegooglePreferred

ಮಂಗಳವಾರ ಸುದ್ದಿಗಾರರೊಂದಿಗೆ ಮಾತನಾಡಿದ ರಾಜ್ಯ ಪ್ರಧಾನ ಕಾರ್ಯದರ್ಶಿ ಪಿ.ರಾಜೀವ್‌, ಪಕ್ಷದ ಪ್ರಮುಖರು ಎಲ್ಲ ಜಿಲ್ಲೆಗಳಿಗೆ ತೆರಳಿ ಜಿಲ್ಲೆಯ ಎಲ್ಲಾ ಪ್ರಮುಖರಿಂದ ಅಭಿಪ್ರಾಯ ಸಂಗ್ರಹಿಸಿ ಜಿಲ್ಲಾಧ್ಯಕ್ಷರು, ಜಿಲ್ಲಾ ಪದಾಧಿಕಾರಿಗಳನ್ನು ಆಯ್ಕೆ ಮಾಡಲಿದ್ದಾರೆ. ಎಲ್ಲರ ಅಭಿಪ್ರಾಯದೊಂದಿಗೆ ಪಕ್ಷವನ್ನು ಮುನ್ನಡೆಸುವ ತೀರ್ಮಾನ ರಾಜ್ಯಾಧ್ಯಕ್ಷರದ್ದಾಗಿದೆ ಎಂದರು.

ಜಾತಿ ಗಣತಿ ವಿಚಾರದಲ್ಲಿ ಸಿದ್ದರಾಮಯ್ಯ ಯಾರ ಮುಲಾಜಿಗೂ ಒಳಗಾಗಬಾರದು: ಎಚ್. ವಿಶ್ವನಾಥ್

ಗುರುವಾರ ಪ್ರಮುಖರ ಸಭೆ:

ಅಂತೆಯೆ ರಾಜ್ಯಾಧ್ಯಕ್ಷರು ಗುರುವಾರ ರಾಜ್ಯ ಪ್ರಮುಖರ ಸಭೆ ಕರೆದಿದ್ದಾರೆ. ಈ ಸಭೆಯಲ್ಲಿ ಮಾಜಿ ಮುಖ್ಯಮಂತ್ರಿಗಳಾದ ಬಿ.ಎಸ್.ಯಡಿಯೂರಪ್ಪ, ಡಿ.ವಿ.ಸದಾನಂದ ಗೌಡ, ಬಸವರಾಜ ಬೊಮ್ಮಾಯಿ, ನಿಕಟಪೂರ್ವ ರಾಜ್ಯಾಧ್ಯಕ್ಷ ನಳಿನ್‍ಕುಮಾರ್ ಕಟೀಲ್, ರಾಜ್ಯದ ಮಾಜಿ ಸಚಿವರು, ಪ್ರಮುಖರು ಭಾಗವಹಿಸುತ್ತಾರೆ. ಅವರ ಅಭಿಪ್ರಾಯ ಪಡೆದು ರಾಜ್ಯ ಸರ್ಕಾರದ ವೈಫಲ್ಯದ ವಿರುದ್ಧ ಹೋರಾಟ, ಪಕ್ಷದ ಸಂಘಟನೆ ಹಾಗೂ ಲೋಕಸಭಾ ಚುನಾವಣೆ ಎದುರಿಸುವುದರ ಕುರಿತು ಎಲ್ಲರ ಸಲಹೆ ಪಡೆಯಲಿದ್ದಾರೆ. ಅಂತೆಯೇ ಈ ಸಭೆಯಲ್ಲಿ ರಾಜ್ಯದಲ್ಲಿ ತಳಮಟ್ಟಕ್ಕೆ ಸಂಘಟನೆ, ಹೋರಾಟ ಮತ್ತು ಪ್ರತಿಭಟನೆಯ ರೂಪುರೇಷೆ ಕೈಗೊಳ್ಳಲಾಗುತ್ತದೆ ಎಂದು ರಾಜೀವ್ ತಿಳಿಸಿದರು.