ಬೆಂಗಳೂರು (ನ.13):  ಸಚಿವ ಸಂಪುಟ ಪುನಾರಚನೆ ವಿಚಾರ ಚರ್ಚೆ ಮುನ್ನಲೆಗೆ ಬರುತ್ತಿದ್ದಂತೆ ಸಚಿವ ಸ್ಥಾನದ ಆಕಾಂಕ್ಷಿಗಳು ಮುಖ್ಯಮಂತ್ರಿಗಳನ್ನು ಭೇಟಿ ಮಾಡಿ ಲಾಬಿ ಶುರು ಮಾಡಿದ್ದು, ಬಿಜೆಪಿಯ ಹಲವು ನಾಯಕರು ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಅವರನ್ನು ಭೇಟಿ ಮಾಡಿ ಮನವಿ ಮಾಡಿದ್ದಾರೆ.

ಜಲಸಂಪನ್ಮೂಲ ಸಚಿವ ರಮೇಶ್‌ ಜಾರಕಿಹೊಳಿ ನಿವಾಸದಲ್ಲಿ ಬುಧವಾರವಷ್ಟೇ ಸಚಿವಕಾಂಕ್ಷಿ ಶಾಸಕರು ಸಚಿವ ಸ್ಥಾನದ ಕುರಿತು ಮಾತುಕತೆ ನಡೆಸಿದ ಬೆನ್ನಲ್ಲೇ ಗುರುವಾರ ಮುಖ್ಯಮಂತ್ರಿಗಳ ಅಧಿಕೃತ ನಿವಾಸ ಕಾವೇರಿಗೆ ತೆರಳಿ ಮುಖ್ಯಮಂತ್ರಿಯನ್ನು ಭೇಟಿ ಮಾಡಿದ್ದಾರೆ. ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಎಂ.ಪಿ.ರೇಣುಕಾಚಾರ್ಯ, ಶಾಸಕರಾದ ರಾಜುಗೌಡ, ಶಂಕರ್‌ ಪಾಟೀಲ್‌ ಮುನೇನಕೊಪ್ಪ ಸೇರಿದಂತೆ ಇತರರು ಭೇಟಿ ನೀಡಿದರು. ಕೆಲ ಕಾಲ ಮುಖ್ಯಮಂತ್ರಿಗಳ ಜತೆ ಮಾತುಕತೆ ನಡೆಸಿ ಸಚಿವ ಸಂಪುಟ ವಿಸ್ತರಣೆ ಅಥವಾ ಪುನಾರಚನೆ ವೇಳೆ ನಮ್ಮ ಹೆಸರನ್ನೂ ಪರಿಗಣಿಸುವಂತೆ ಮನವಿ ಮಾಡಿದರು.

ಉಪ ಚುನಾವಣೆ ಮೇಲೆ ಶಂಕೆ : ಮತಯಂತ್ರದ ಬಗ್ಗೆ ನಡೆಯಲಿದೆ ಶೀಘ್ರ ತನಿಖೆ ...

ಮುಖ್ಯಮಂತ್ರಿಗಳನ್ನು ಭೇಟಿ ಮಾಡಿದ ಬಳಿಕ ರಾಜ್ಯ ಬಿಜೆಪಿ ಉಪಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರನ್ನು ಸಹ ಭೇಟಿ ಮಾಡಿ ಸಮಾಲೋಚನೆ ನಡೆಸಿದರು. ಶಿರಾ ಗೆಲುವಿಗೆ ಅಭಿನಂದನೆ ಸಲ್ಲಿಸಿದ ಬಳಿಕ ಸಂಪುಟ ವಿಸ್ತರಣೆ ಕುರಿತು ಚರ್ಚೆ ನಡೆಸಿದರು. ತಾವು ಸಹ ಸಚಿವ ಸ್ಥಾನ ಆಕಾಂಕ್ಷಿಗಳು ಎಂಬುದನ್ನು ಮನವರಿಕೆ ಮಾಡಿಕೊಡುವ ಪ್ರಯತ್ನ ನಡೆಸಿದರು ಎಂದು ತಿಳಿದುಬಂದಿದೆ.