ಶಾಸಕಾಂಗ ಪಕ್ಷದ ನಾಯಕ ಮತ್ತು ಪಕ್ಷದ ನೂತನ ಅಧ್ಯಕ್ಷರ ಆಯ್ಕೆ ಸಂಬಂಧ ಶಾಸಕರು ಹಾಗೂ ಪರಾಜಿತ ಅಭ್ಯರ್ಥಿಗಳ ಅಭಿಪ್ರಾಯವನ್ನೂ ಆಲಿಸಲಾಗುತ್ತದೆ. ಇಲ್ಲಿ ವ್ಯಕ್ತವಾಗುವ ಅಭಿಪ್ರಾಯಗಳನ್ನು ಆಧರಿಸಿ ಪಕ್ಷದ ವರಿಷ್ಠರು ಮುಂದಿನ ನಿರ್ಧಾರ ಕೈಗೊಳ್ಳಲಿದ್ದಾರೆ. 

ಬೆಂಗಳೂರು(ಜೂ.08): ವಿಧಾನಸಭೆ ಚುನಾವಣೆ ಫಲಿತಾಂಶ ಹೊರಬಿದ್ದು ಒಂದು ತಿಂಗಳಾಗುವ ಹೊತ್ತಿನಲ್ಲಿ ಬಿಜೆಪಿಯು ನೂತನ ಶಾಸಕರು ಮತ್ತು ಪರಾಜಿತ ಅಭ್ಯರ್ಥಿಗಳ ಅವಲೋಕನ ಸಭೆಯನ್ನು ಇಂದು(ಗುರುವಾರ) ಕರೆದಿದೆ.

ಈ ಸಭೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ 9 ವರ್ಷಗಳನ್ನು ಪೂರೈಸಿರುವ ಹಿನ್ನೆಲೆಯಲ್ಲಿ ಮುಂದೆ ಹಮ್ಮಿಕೊಳ್ಳಬೇಕಾಗಿರುವ ಕಾರ್ಯಕ್ರಮಗಳು, ಕೇಂದ್ರದ ಯೋಜನೆಗಳನ್ನು ಹೆಚ್ಚು ಹೆಚ್ಚು ಜನರಿಗೆ ತಲುಪಿಸುವ ಬಗೆ, ಜುಲೈ 3ರಿಂದ ಆರಂಭವಾಗಲಿರುವ ರಾಜ್ಯ ವಿಧಾನಮಂಡಲದ ಅಧಿವೇಶನ ಮತ್ತಿತರ ಪ್ರಸಕ್ತ ವಿದ್ಯಮಾನಗಳ ಬಗ್ಗೆಯೂ ಚರ್ಚೆ ನಡೆಯಲಿದೆ.

ರಾಜ್ಯ ಆಳೋದು ಒಂದೇ, ಈ ಶಾಸಕನ ಕಂಟ್ರೋಲ್‌ ಮಾಡೋದು ಒಂದೇ: ಬಿಜೆಪಿ ಶಾಸಕ ಅಭಯ ಪಾಟೀಲ

ಇದರ ಜತೆಗೆ ಮುಖ್ಯವಾಗಿ ಶಾಸಕಾಂಗ ಪಕ್ಷದ ನಾಯಕ ಮತ್ತು ಪಕ್ಷದ ನೂತನ ಅಧ್ಯಕ್ಷರ ಆಯ್ಕೆ ಸಂಬಂಧ ಶಾಸಕರು ಹಾಗೂ ಪರಾಜಿತ ಅಭ್ಯರ್ಥಿಗಳ ಅಭಿಪ್ರಾಯವನ್ನೂ ಆಲಿಸಲಾಗುತ್ತದೆ. ಇಲ್ಲಿ ವ್ಯಕ್ತವಾಗುವ ಅಭಿಪ್ರಾಯಗಳನ್ನು ಆಧರಿಸಿ ಪಕ್ಷದ ವರಿಷ್ಠರು ಮುಂದಿನ ನಿರ್ಧಾರ ಕೈಗೊಳ್ಳಲಿದ್ದಾರೆ ಎಂದು ತಿಳಿದು ಬಂದಿದೆ.

ಮೊದಲಿಗೆ ಬೆಳಗ್ಗೆ 10.30ಕ್ಕೆ ನೂತನ ಶಾಸಕರ ಸಭೆ ನಡೆಯಲಿದ್ದು, ಬಳಿಕ ಮಧ್ಯಾಹ್ನ ಪರಾಜಿತ ಅಭ್ಯರ್ಥಿಗಳ ಸಭೆ ನಡೆಯಲಿದೆ. ಈ ಸಭೆಯಲ್ಲಿ ಪಕ್ಷದ ರಾಜ್ಯ ಉಸ್ತುವಾರಿ ಅರುಣ್‌ ಸಿಂಗ್‌, ರಾಜ್ಯಾಧ್ಯಕ್ಷ ನಳಿನ್‌ಕುಮಾರ್‌ ಕಟೀಲ್‌, ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ, ಮಾಜಿ ಮುಖ್ಯಮಂತ್ರಿಗಳಾದ ಬಿ.ಎಸ್‌.ಯಡಿಯೂರಪ್ಪ, ಬಸವರಾಜ ಬೊಮ್ಮಾಯಿ, ಮಾಜಿ ಉಪಮುಖ್ಯಮಂತ್ರಿ ಕೆ.ಎಸ್‌.ಈಶ್ವರಪ್ಪ ಮೊದಲಾದವರು ಪಾಲ್ಗೊಳ್ಳಲಿದ್ದಾರೆ ಎಂದು ಪಕ್ಷದ ರಾಜ್ಯ ಪ್ರಧಾನ ಕಾರ್ಯದರ್ಶಿ ಮತ್ತು ವಿಧಾನಪರಿಷತ್‌ ಸದಸ್ಯ ಎನ್‌.ರವಿಕುಮಾರ್‌ ತಿಳಿಸಿದ್ದಾರೆ.