ಕಾಂಗ್ರೆಸ್ ಸೇರೊಲ್ಲವೆಂದು ಹೇಳುತ್ತಲೇ ಸಿಎಂ ಸಿದ್ದರಾಮಯ್ಯ ಭೇಟಿಯಾದ ಶಾಸಕ ಶಿವರಾಂ ಹೆಬ್ಬಾರ್
ಮಧ್ಯಾಹ್ನವಷ್ಟೇ ಕಾಂಗ್ರೆಸ್‌ಗೆ ಸೇರುವುದಿಲ್ಲ ಎಂದು ಹೇಳಿದ್ದ ಬಿಜೆಪಿ ಶಾಸಕ ಶಿವರಾಂ ಹೆಬ್ಬಾರ್, ರಾತ್ರಿಯಾಗುತ್ತಲೇ ಸಿಎಂ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿದ್ದಾರೆ.
ಬೆಂಗಳೂರು (ಆ.23): ರಾಜ್ಯ ರಾಜಕಾರಣದಲ್ಲಿ ಲೋಕಸಭಾ ಚುನಾವಣೆಗೂ ಮುನ್ನವೇ ಈ ಹಿಂದೆ ಕಾಂಗ್ರೆಸ್‌ನಿಂದ ಬಿಜೆಪಿಗೆ ಹೋಗಿದ್ದ ಶಾಸಕರನ್ನು ಪುನಃ ಘರ್ ವಾಪಸಿ ಮಾಡಿಕೊಳ್ಳಲಾಗುತ್ತಿದೆ ಎಂಬ ಮಾತು ಕೇಳಿಬರುತ್ತಿದೆ. ಇನ್ನು ನಾವು ಬಿಜೆಪಿ ತೊರೆಯುವುದಿಲ್ಲ ಎಂದು ಹೇಳುತ್ತಲೇ ಕೆಲವು ದಿನಗಳ ಹಿಂದೆ ಶಾಸಕ ಎಸ್.ಟಿ. ಸೋಮಶೇಖರ್ ಅವರು ಸಿಎಂ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿದ್ದರು. ಈಗ ಮತ್ತೊಬ್ಬ ರೆಬೆಲ್ ಶಾಸಕ ಶಿವರಾಮ್ ಹೆಬ್ಬಾರ್ ಕೂಡ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿದ್ದಾರೆ.
ಬಿಜೆಪಿ ಶಾಸಕ ಶಿವರಾಂ ಹೆಬ್ಬಾರ್ ಶುಕ್ರವಾರ ರಾತ್ರಿ ವೇಳೆ ಸಿಎಂ ಸಿದ್ದರಾಮಯ್ಯ ಭೇಟಿಯಾಗಿದ್ದಾರೆ. ಕಾಂಗ್ರೆಸ್ ಸರ್ಪಡೆಯಾಗ್ತಾರೆ ಎಂಬ ವದಂತಿ ಬೆನ್ನಲ್ಲೇ, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನ ಅವರ ನಿವಾಸದಲ್ಲಿ ಭೇಟಿಯಾಗಿ ಚರ್ಚೆ ನಡೆಸಿ ತೆರಳಿದ್ದಾರೆ. ಸುಮಾರು ಒಂದುವರೆ ಗಂಟೆಗಳ ಕಾಲ ಸಿದ್ದರಾಮಯ್ಯನವರ ಜೊತೆ ಚರ್ಚೆ ನಡೆಸಿದ್ದಾರೆ. ಆದರೆ, ಇದಕ್ಕೂ ಮುನ್ನ ಮಧ್ಯಾಹ್ನದ ವೇಳೆ ನಾನು ಕಾಂಗ್ರೆಸ್ ಹೊಗೋದಿಲ್ಲ ಎಂದು ಹೇಳಿಕೆ ಕೊಟ್ಟಿದ್ದರು. ಆದರೆ, ರಾತ್ರಿ ವೇಳೆಗೆ ಸಿಎಂ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿರೋದು ಸಾಕಷ್ಟು ಕುತೂಹಲ ಮೂಡಿಸಿದೆ.
ಶ್ರೀಮಂತರ ಜೇಬು ತುಂಬಿಸುವವರು ದೇಶದಲ್ಲಿ ಅಧಿಕಾರದಲ್ಲಿದ್ದಾರೆ: ಸಿದ್ದರಾಮಯ್ಯ
ಈ ಕುರಿತು ಮಾಧ್ಯಮಗಳೊಂದಿಗೆ ಮಾತನಾಡಿದ ಶಿವರಾಮ್ ಹೆಬ್ಬಾರ್ ಅವರು, ತಾವು ಕ್ಷೇತ್ರದ ಕೆಲಸದ ಕಾರಣಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿದ್ದಾಗಿ ತಿಳಿಸಿದ್ದಾರೆ. ಯಲ್ಲಾಪುರ ವಿಧಾನಸಭಾ ಕ್ಷೇತ್ರವನ್ನು ಕೂಡ ಬರಗಾಲ ಪೀಡಿತ ಪ್ರದೇಶ ಎಂದು ಘೋಷಿಸುವಂತೆ ಮನವಿ ಮಾಡಲಾಗಿದೆ. ಯಲ್ಲಾಪುರ, ಮುಂಡಗೋಡ ಹಾಗೂ ಬನವಾಸಿ ಭಾಗದಲ್ಲಿ ವಾಡಿಕೆಗಿಂತ ಶೇ. 70 ಪ್ರತಿಶತ ಮಳೆಯ ಪ್ರಮಾಣ ಕಡಿಮೆಯಾಗಿದೆ. ಆದ್ದರಿಂದ ಕ್ಷೇತ್ರದ ರೈತರು ಸಂಕಷ್ಟವನ್ನು ಅನುಭವಿಸುತ್ತಿದ್ದಾರೆ. ರೈತರ ಹಿತದೃಷ್ಟಿಯಿಂದ ಯಲ್ಲಾಪುರ ವಿಧಾನಸಭಾ ಕ್ಷೇತ್ರವನ್ನು ಬರಗಾಲ ಪೀಡಿತ ಪ್ರದೇಶವೆಂದು ಘೋಷಿಸಬೇಕು ಎಂದು ಮನವಿ ಮಾಡಲಾಗಿದೆ ಎಂದು ತಿಳಿಸಿದರು.
ಇನ್ನು ಮಳೆಯ ಕೊರತೆಯ ಹಿನ್ನೆಲೆಯಲ್ಲಿ ಜನ ಹಾಗೂ ಜಾನುವಾರಗಳಿಗೆ ಕುಡಿಯುವ ನೀರಿನ ಸಮಸ್ಯೆ ಉಂಟಾಗಿದೆ. ಕುಡಿಯುವ ನೀರು ಪೂರೈಕೆಗೆ ವಿಶೇಷ ಅನುದಾನಕ್ಕೆ ಮನವಿ ಮಾಡಲಾಗಿದೆ. ಅನುದಾನ ಮಂಜೂರು ಮಾಡುವಂತೆ ಲಿಖಿತ ರೂಪದಲ್ಲಿ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಕೆ ಮಾಡಲಾಗಿದೆ ಎಂದು ಮಾಧ್ಯಮಗಳಿಗೆ ತಿಳಿದರು. ಇನ್ನು ಮತ್ತೊಂದೆಡೆ ಶಾಸಕ ಎಸ್.ಟಿ. ಸೋಮಶೇಖರ್ ಅವರು ಕೂಡ ಸಿಎಂ ಸಿದ್ದರಾಮಯ್ಯ ಅವರನ್ನು ಭೇಟಿಯಾದ ಬೆನ್ನಲ್ಲಿಯೇ ಕುಡಿಯುವ ನೀರಿಗಾಗಿ ಬೆಂಗಳೂರಿನ ಯಶವಂತಪುರ ವಿಧಾನಸಭಾ ಕ್ಷೇತ್ರಕ್ಕೆ 7.6 ಕೋಟಿ ರೂ. ಅನುದಾನವನ್ನು ಕೊಡಲಾಗಿತ್ತು. ಈಗ ಯಲ್ಲಾಪುರ ಕ್ಷೇತ್ರಕ್ಕೂ ಭರಪೂರ ಅನುದಾನ ಸಿಗುವುದೇ ಎನ್ನುವುದನ್ನು ಕಾದುನೋಡಬೇಕಿದೆ.
ರಾಜ್ಯ ಸರ್ಕಾರ ತಕ್ಷಣವೇ ಬರಗಾಲ ಘೋಷಿಸಿ: ಬಿಎಸ್‌ವೈ, ಬೊಮ್ಮಾಯಿ ಆಗ್ರಹ
ಆಪರೇಷನ್ ಹಸ್ತ ಯಶಸ್ವಿಯಾಗೊಲ್ಲ: ಹುಬ್ಬಳ್ಳಿ (ಆ.26): ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಹೆಚ್ಚಿನ ಸ್ಥಾನ ಗೆಲ್ಲದಿದ್ದಲ್ಲಿ ರಾಜ್ಯ ಸರ್ಕಾರದ ಮೇಲೆ ನೇರ ಪರಿಣಾಮ ಬೀರಲಿದೆ ಎಂದು ನುಡಿದಿರುವ ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಈ ಹಿನ್ನೆಲೆಯಲ್ಲಿ ಕಾಂಗ್ರೆಸ್ ಆಪರೇಷನ್ ಹಸ್ತಕ್ಕೆ ಕೈಹಾಕಿದೆ. ಆದರೆ, ಅದರಲ್ಲಿ ಅದು ಯಶಸ್ವಿಯಾಗಲ್ಲ ಎಂದಿದ್ದಾರೆ. ಈ ಕುರಿತು ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಲೋಕಸಭೆ ಚುನಾವಣೆಯ ಸಮೀಕ್ಷೆಯಲ್ಲಿ ಕಾಂಗ್ರೆಸ್‌ಗೆ ಹೆಚ್ಚಿನ ಸ್ಥಾನ ಬರಲ್ಲ ಎಂದು ಹೇಳಿವೆ. ಇದು ಕಾಂಗ್ರೆಸ್‌ನಲ್ಲಿ ಭೀತಿಯನ್ನುಂಟು ಮಾಡಿದೆ. ಹೇಗಾದರೂ ಮಾಡಿ ಲೋಕಸಭೆ ಚುನಾವಣೆಯಲ್ಲಿ ಹೆಚ್ಚಿನ ಸ್ಥಾನ ಪಡೆಯಲೇಬೇಕೆಂಬ ಇರಾದೆಯನ್ನು ಹೊಂದಿದೆ. ಇಲ್ಲದಿದ್ದಲ್ಲಿ ರಾಜ್ಯ ಸರ್ಕಾರದ ಭವಿಷ್ಯದ ಮೇಲೆ ಪರಿಣಾಮವಾಗಲಿದೆ. ಇದು ಕಾಂಗ್ರೆಸ್ ಮುಖಂಡರಿಗೂ ಗೊತ್ತಿದೆ. ಈ ಹಿನ್ನೆಲೆಯಲ್ಲಿ ಅದು ಆಪರೇಷನ್ ಹಸ್ತಕ್ಕೆ ಕೈ ಹಾಕಿದೆ. ಆದರೆ ಇದರಲ್ಲಿ ಅದು ಯಶಸ್ವಿಯಾಗಲ್ಲ ಎಂದರು.