Asianet Suvarna News Asianet Suvarna News

ಯಾವುದೇ ಕಾರಣಕ್ಕೂ ನಿಮ್ಮನ್ನು ಬದಲಿಸಲ್ಲ: ಸಿಎಂಗೆ ನಡ್ಡಾ ಫೋನ್‌

ರಾಜ್ಯದಲ್ಲಿ ಮುಖ್ಯಮಂತ್ರಿ ಬದಲಾವಣೆಯಿಲ್ಲ ಎಂಬ ಸಂದೇಶವನ್ನು ಆಡಳಿತಾರೂಢ ಬಿಜೆಪಿ ಹೈಕಮಾಂಡ್‌ ರವಾನಿಸಿದೆ. ಖುದ್ದು ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಅವರೇ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ದೂರವಾಣಿ ಕರೆ ಮಾಡಿ ಯಾವುದೇ ಕಾರಣಕ್ಕೂ ನಿಮ್ಮನ್ನು ಬದಲಾಯಿಸುವುದಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ ಎನ್ನಲಾಗಿದೆ.

bjp president jp nadda reacts on cm basavaraj bommai change gvd
Author
Bangalore, First Published Aug 11, 2022, 4:00 AM IST

ಬೆಂಗಳೂರು (ಆ.11): ರಾಜ್ಯದಲ್ಲಿ ಮುಖ್ಯಮಂತ್ರಿ ಬದಲಾವಣೆಯಿಲ್ಲ ಎಂಬ ಸಂದೇಶವನ್ನು ಆಡಳಿತಾರೂಢ ಬಿಜೆಪಿ ಹೈಕಮಾಂಡ್‌ ರವಾನಿಸಿದೆ. ಖುದ್ದು ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಅವರೇ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ದೂರವಾಣಿ ಕರೆ ಮಾಡಿ ಯಾವುದೇ ಕಾರಣಕ್ಕೂ ನಿಮ್ಮನ್ನು ಬದಲಾಯಿಸುವುದಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ ಎನ್ನಲಾಗಿದೆ. ಪ್ರತಿಪಕ್ಷ ಕಾಂಗ್ರೆಸ್‌ ಮುಖ್ಯಮಂತ್ರಿಗಳ ಬದಲಾವಣೆ ಸಾಧ್ಯತೆ ಬಗ್ಗೆ ಸರಣಿ ಟ್ವೀಟ್‌ ಮಾಡಿದ ಬೆನ್ನಲ್ಲೇ ರಾಜ್ಯ ರಾಜಕಾರಣದಲ್ಲಿ ತೀವ್ರ ಚರ್ಚೆ ಆರಂಭವಾಗಿತ್ತು.

ಇದು ಸ್ವತಃ ಮುಖ್ಯಮಂತ್ರಿ ಬೊಮ್ಮಾಯಿ ಅವರಲ್ಲದೆ ಬಿಜೆಪಿ ಮುಖಂಡರು ಹಾಗೂ ಕಾರ್ಯಕರ್ತರಲ್ಲೂ ಗೊಂದಲ ಹುಟ್ಟು ಹಾಕಿತ್ತು. ಇದೀಗ ಪಕ್ಷದ ವರಿಷ್ಠರು ಮುಖ್ಯಮಂತ್ರಿಗಳ ಬೆಂಬಲಕ್ಕೆ ನಿಂತಿದ್ದರಿಂದ ಗೊಂದಲಕ್ಕೆ ತೆರೆ ಬೀಳುವಂತಾಗಿದೆ. ‘ರಾಜ್ಯದಲ್ಲಿ ಮುಖ್ಯಮಂತ್ರಿ ಬದಲಾವಣೆ ಕುರಿತಂತೆ ವದಂತಿ ದಟ್ಟವಾಗಿ ಹಬ್ಬಿದ ಹಿನ್ನೆಲೆಯಲ್ಲಿ ಬುಧವಾರ ಸಂಜೆ ನಡ್ಡಾ ಅವರು ಬೊಮ್ಮಾಯಿ ಅವರಿಗೆ ಕರೆ ಮಾಡಿ ಅಭಯ ನೀಡಿದ್ದಾರೆ’ ಎಂದು ಮುಖ್ಯಮಂತ್ರಿಗಳ ಕಚೇರಿ ಮೂಲಗಳು ತಿಳಿಸಿವೆ.

ಸಿಎಂ ಬದಲಾವಣೆ ಚರ್ಚೆ ಮಾಡಬಾರ್ದು, ಇಲ್ಲಿಗೇ ನಿಲ್ಲಿಸಿ: ಯಡಿಯೂರಪ್ಪ ಖಡಕ್ ಸೂಚನೆ

ನಿಮ್ಮ ನೇತೃತ್ವದಲ್ಲೇ ಚುನಾವಣೆ: ‘ನಿಮ್ಮ ನೇತೃತ್ವದಲ್ಲೇ ಮುಂದಿನ ವಿಧಾನಸಭಾ ಚುನಾವಣೆ ಎದುರಿಸಲಾಗುವುದು ಎಂಬುದನ್ನು ಈಗಾಗಲೇ ಬಹಿರಂಗವಾಗಿ ಹೇಳಿದ್ದೇವೆ. ನಿಮ್ಮ ಕೆಲಸದ ಬಗ್ಗೆ ಪಕ್ಷಕ್ಕೆ ಮೆಚ್ಚುಗೆ ಇದೆ. ಹೀಗಾಗಿ, ನಿಮ್ಮ ಪಾಡಿಗೆ ನೀವು ಕೆಲಸ ಮಾಡಿಕೊಂಡು ಹೋಗಿ. ಸರ್ಕಾರದ ವರ್ಚಸ್ಸು ಹೆಚ್ಚಿಸುವ ಮೂಲಕ ಹಾಗೂ ಪಕ್ಷದ ಸಂಘಟನೆ ಬಲಪಡಿಸುವ ಮೂಲಕ ಮುಂದಿನ ಚುನಾವಣೆಗೆ ಸಿದ್ಧರಾಗಿ ಎಂದು ಸಲಹೆ ನೀಡಿದ್ದಾರೆ’ ಎಂದು ತಿಳಿದು ಬಂದಿದೆ.

‘ನೀವು ರಾಜ್ಯ ಪ್ರವಾಸ ಮಾಡಿ. ಕೇಂದ್ರ ಹಾಗೂ ರಾಜ್ಯ ಸರ್ಕಾರಗಳ ಜನಪರ ಕಾರ್ಯಕ್ರಮಗಳನ್ನು ಜನರಿಗೆ ತಲುಪುವಂತೆ ನೋಡಿಕೊಳ್ಳಿ. ಈ ವದಂತಿ ಮತ್ತಿತರ ವಿಷಯಗಳನ್ನು ಹೈಕಮಾಂಡ್‌ಗೆ ಬಿಡಿ. ನಾವು ನೋಡಿಕೊಳ್ಳುತ್ತೇವೆ’ ಎಂದು ನಡ್ಡಾ ಅವರು ಸ್ಪಷ್ಟಭರವಸೆ ನೀಡಿದ್ದಾರೆ ಎನ್ನಲಾಗಿದೆ.

ಸಿಎಂ ಬದಲಾವಣೆ ವದಂತಿ ಬಗ್ಗೆ ಬಿಜೆಪಿ ಹೈಕಮಾಂಡ್‌ ತೀವ್ರ ಗರಂ: ರಾಜ್ಯದಲ್ಲಿ ಮುಖ್ಯಮಂತ್ರಿ ಬದಲಾವಣೆ ಬಗ್ಗೆ ವದಂತಿ ಹಬ್ಬುತ್ತಿರುವ ಕುರಿತಂತೆ ಆಡಳಿತಾರೂಢ ಬಿಜೆಪಿ ಹೈಕಮಾಂಡ್‌ ಗರಂ ಆಗಿದೆ. ಈ ವದಂತಿ ಎಲ್ಲಿಂದ ಹಬ್ಬುತ್ತಿದೆ ಎಂಬುದನ್ನು ಪತ್ತೆ ಹಚ್ಚಿ ವರದಿ ಕೊಡಿ. ವದಂತಿ ಹಬ್ಬಿಸುತ್ತಿರುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ವರಿಷ್ಠರು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಸೂಚಿಸಿದ್ದಾರೆ ಎನ್ನಲಾಗಿದೆ.

ಸುಳ್ಳು ಹೇಳುವುದರಲ್ಲಿ ಕಾಂಗ್ರೆಸ್ ನಾಯಕರು ಶೂರರು; CM ಬದಲಾವಣೆಗೆ ಶ್ರೀರಾಮುಲು ಪ್ರತಿಕ್ರಿಯೆ

‘ವದಂತಿಗಳ ಹಿನ್ನೆಲೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ಅವರು ಬುಧವಾರ ಸಂಜೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ದೂರವಾಣಿ ಕರೆ ಮಾಡಿ ಅಭಯ ನೀಡುವುದರ ಜತೆಗೆ ವದಂತಿ ಹಬ್ಬಿಸುತ್ತಿರುವವರ ಬಗ್ಗೆ ವಿಚಾರಿಸಿದ್ದಾರೆ’ ಎಂದು ಮೂಲಗಳು ತಿಳಿಸಿವೆ. ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿ ಇತ್ತೀಚೆಗಷ್ಟೇ ಒಂದು ವರ್ಷ ಪೂರೈಸಿರುವ ಬೊಮ್ಮಾಯಿ ಅವರ ಬದಲಾವಣೆ ಬಗ್ಗೆ ವದಂತಿ ಹಬ್ಬುತ್ತಿರುವುದು ಇದೇ ಮೊದಲೇನಲ್ಲ. ಹಿಂದೆ ಹಲವು ಬಾರಿ ವದಂತಿ ಹಬ್ಬಿತ್ತು. ಇದರಿಂದ ಆಡಳಿತದ ಮೇಲೆ ಮತ್ತು ಪಕ್ಷದ ಸಂಘಟನೆ ಮೇಲೆ ವ್ಯತಿರಿಕ್ತ ಪರಿಣಾಮ ಉಂಟಾಗುವುದರಿಂದ ಈ ಬಾರಿ ಪಕ್ಷದ ವರಿಷ್ಠರು ಗಂಭೀರವಾಗಿ ಸ್ವೀಕರಿಸಿದ್ದಾರೆ ಎಂದು ತಿಳಿದು ಬಂದಿದೆ.

Follow Us:
Download App:
  • android
  • ios