ನೆಟ್ಟಾರು ಪತ್ನಿ ನೌಕರಿ ಖೋತಾ: ಸಿದ್ದು ಸರ್ಕಾರ ಪಿಎಫ್‌ಐ ಕೈಗೊಂಬೆ ಎಂದ ಬಿಜೆಪಿ!
ಮುಖ್ಯಮಂತ್ರಿಗಳ ವಿಶೇಷ ಅಧಿಕಾರದಲ್ಲಿ ಸರ್ಕಾರಿ ಉದ್ಯೋಗಕ್ಕೆ ತಾತ್ಕಾಲಿಕವಾಗಿ ನೇಮಕಗೊಂಡಿದ್ದ ದಕ್ಷಿಣ ಕನ್ನಡದ ಬಿಜೆಪಿ ಮುಖಂಡ ದಿ.ಪ್ರವೀಣ್ ನೆಟ್ಟಾರ್ ಅವರ ಪತ್ನಿ ನೂತನ ಅವರ ನೇಮಕಾತಿಯನ್ನು ಕಾಂಗ್ರೆಸ್ ಸರ್ಕಾರ ರದ್ದು ಮಾಡಿದೆ. ಈ ಬಗ್ಗೆ ಬಿಜೆಪಿ ಪಕ್ಷವು ಟ್ವೀಟ್ ಮಾಡಿದೆ.
ಬೆಂಗಳೂರು (ಮೇ.27): ಮುಖ್ಯಮಂತ್ರಿಗಳ ವಿಶೇಷ ಅಧಿಕಾರದಲ್ಲಿ ಸರ್ಕಾರಿ ಉದ್ಯೋಗಕ್ಕೆ ತಾತ್ಕಾಲಿಕವಾಗಿ ನೇಮಕಗೊಂಡಿದ್ದ ದಕ್ಷಿಣ ಕನ್ನಡದ ಬಿಜೆಪಿ ಮುಖಂಡ ದಿ.ಪ್ರವೀಣ್ ನೆಟ್ಟಾರ್ ಅವರ ಪತ್ನಿ ನೂತನ ಅವರ ನೇಮಕಾತಿಯನ್ನು ಕಾಂಗ್ರೆಸ್ ಸರ್ಕಾರ ರದ್ದು ಮಾಡಿದೆ. ಈ ಬಗ್ಗೆ ಬಿಜೆಪಿ ಪಕ್ಷವು, ಪಿಎಫ್ಐ ಕೈಗೊಂಬೆಯಂತೆ ಸಿದ್ದರಾಮಯ್ಯರವರ ಸರ್ಕಾರ ಕುಣಿಯುತ್ತಿರುವುದು ರಾಜ್ಯದ ದುರಂತ ಎಂದು ಟ್ವೀಟ್ ಮಾಡಿದೆ.
ಕಾಂಗ್ರೆಸ್ ಪಕ್ಷವೇ ಸಾಕಿ ಬೆಳೆಸಿದ ಪಿಎಫ್ಐ ಎಂಬ ಭಯೋತ್ಪಾದಕ ಸಂಘಟನೆಯ ಕೋಮು ದ್ವೇಷಕ್ಕೆ ಒಳಪಟ್ಟು, ಪಿಎಫ್‌ಐ ಗೂಂಡಾಗಳಿಂದ ಹತ್ಯೆಗೊಳಗಾದ ಪ್ರವೀಣ್ ನೆಟ್ಟಾರು ಅವರ ಧರ್ಮಪತ್ನಿಗೆ ಜೀವನ ನಿರ್ವಹಣೆಗಾಗಿ ಅನುಕಂಪದ ಆಧಾರದಲ್ಲಿ ನಮ್ಮ ಸರ್ಕಾರ ಮಂಗಳೂರಿನ ಡಿ.ಸಿ. ಕಚೇರಿಯಲ್ಲಿ ಉದ್ಯೋಗ ಕಲ್ಪಿಸಿತ್ತು. ಈಗ ಆಡಳಿತಕ್ಕೆ ಬಂದಿರುವ ಕಾಂಗ್ರೆಸ್ ಸರ್ಕಾರ ತನ್ನ ದ್ವೇಷದ ರಾಜಕೀಯವನ್ನು ಮುಂದುವರೆಸಿರುವುದು ಖಂಡನೀಯ. ಈ ಕೂಡಲೇ ಸರ್ಕಾರ ಉದ್ಯೋಗದಿಂದ ವಜಾಮಾಡುವ ಅಮಾನವೀಯ ಆದೇಶವನ್ನು ಹಿಂಪಡೆಯಬೇಕೆಂದು ಆಗ್ರಹಿಸುತ್ತೇವೆ ಎಂದು ತನ್ನ ಟ್ವೀಟರ್ ಖಾತೆಯಲ್ಲಿ ಬರೆದುಕೊಂಡಿದೆ.
ನೆಟ್ಟಾರು ಪತ್ನಿ ನೌಕರಿ ಖೋತಾ: ಮುಖ್ಯಮಂತ್ರಿಗಳ ವಿಶೇಷ ಅಧಿಕಾರದಲ್ಲಿ ಅನುಕಂಪದ ಆಧಾರದಲ್ಲಿ ಸರ್ಕಾರಿ ಉದ್ಯೋಗಕ್ಕೆ ನೇಮಕಗೊಂಡಿದ್ದ ದಕ್ಷಿಣ ಕನ್ನಡದ ಬಿಜೆಪಿ ಮುಖಂಡ ದಿ.ಪ್ರವೀಣ್ ನೆಟ್ಟಾರ್ ಅವರ ಪತ್ನಿ ನೂತನ ಕುಮಾರಿ ಅವರ ಕೆಲಸಕ್ಕೆ ಕುತ್ತು ಬಂದಿದೆ. ಕಾಂಗ್ರೆಸ್ ಸರ್ಕಾರ ಅಸ್ತಿತ್ವಕ್ಕೆ ಬಂದಿದ್ದರಿಂದ ಈ ಹಿಂದಿನ ಸರ್ಕಾರ ಮಾಡಿದ ಎಲ್ಲ ರೀತಿಯ ತಾತ್ಕಾಲಿಕ ನೇಮಕಾತಿಗಳನ್ನು ರದ್ದುಪಡಿಸಲಾಗಿದೆ. ಅದರಂತೆ ಮಂಗಳೂರಿನ ಜಿಲ್ಲಾಧಿಕಾರಿ ಕಚೇರಿಯ ಪ್ರಾಕೃತಿಕ ವಿಕೋಪ ವಿಭಾಗದಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ನೂತನ ಕುಮಾರಿ ಅವರನ್ನು ಶುಕ್ರವಾರದಿಂದ ಜಾರಿಗೆ ಬರುವಂತೆ ಕೆಲಸದಿಂದ ತೆಗೆದುಹಾಕಿ ಆದೇಶ ಹೊರಡಿಸಲಾಗಿದೆ.
ಕಾಂಗ್ರೆಸ್ ಸರ್ಕಾರದ ಆಯಸ್ಸು ಲೋಕಸಭಾ ಚುನಾವಣೆವರೆಗೆ ಮಾತ್ರ: ಬೊಮ್ಮಾಯಿ, ಎಚ್‌ಡಿಕೆ
2022ರ ಜುಲೈ 26ರಂದು ಬಿಜೆಪಿ ಮುಖಂಡ ಪ್ರವೀಣ್ ನೆಟ್ಟಾರು ಅವರನ್ನು ದುಷ್ಕರ್ಮಿಗಳು ಹತ್ಯೆ ಮಾಡಿದ್ದರು. ಘಟನೆಯ ಸಮಗ್ರ ತನಿಖೆಯನ್ನು ಅಂದಿನ ಬಿಜೆಪಿ ಸರ್ಕಾರ ರಾಷ್ಟ್ರೀಯ ತನಿಖಾ ಏಜೆನ್ಸಿಗೆ ವಹಿಸಿತ್ತು. ಅಲ್ಲದೆ, ಪ್ರವೀಣ್ ನೆಟ್ಟಾರು ಕುಟುಂಬಕ್ಕೆ ಬಿಜೆಪಿ ವತಿಯಿಂದ ಮನೆ ನಿರ್ಮಿಸಿಕೊಡಲಾಗಿದ್ದು, ಪ್ರವೀಣ್ ಪತ್ನಿಗೆ ಮಾನವೀಯ ನೆಲೆಯಲ್ಲಿ ಸಿಎಂ ಅವರ ವಿಶೇಷಾಧಿಕಾರ ಬಳಸಿ ಜಿಲ್ಲಾಧಿಕಾರಿ ಕಚೇರಿಯಲ್ಲಿ ಕೆಲಸ ಕೊಡಲಾಗಿತ್ತು. 2022ರ ಸೆ.22ರಂದು ಅಂದಿನ ಸಿಎಂ ಬೊಮ್ಮಾಯಿ ಹೊರಡಿಸಿದ್ದ ಆದೇಶದಲ್ಲಿ ಗುತ್ತಿಗೆ ಆಧಾರದಲ್ಲಿ ಹಿರಿಯ ಸಹಾಯಕ ಗ್ರೂಪ್ ‘ಸಿ’ ಹುದ್ದೆಗೆ ಅವರನ್ನು ನೇಮಕ ಮಾಡಲಾಗಿತ್ತು. ಈ ಹುದ್ದೆ ಮುಖ್ಯಮಂತ್ರಿ ಅಧಿಕಾರ ಇರುವ ತನಕ ಇಲ್ಲವೇ ಮುಂದಿನ ಆದೇಶವರೆಗೆ ಎಂದು ನಮೂದಿಸಲಾಗಿತ್ತು.
ರೈತಪರ ಹೋರಾಟಕ್ಕೆ ಜೆಡಿಎಸ್ ಕಾರ‍್ಯಕಾರಿಣಿ ನಿರ್ಣಯ: ಬಿಜೆಪಿ, ಕಾಂಗ್ರೆಸ್ ಜೊತೆ ಸಮಾನ ಅಂತರ
ಮುಖ್ಯಮಂತ್ರಿ ಅಧಿಕಾರ ಇರುವವರೆಗೆ ಹುದ್ದೆ: ಮಾಜಿ ಸಿಎಂ ಬೊಮ್ಮಾಯಿ ಅವರು ಆದೇಶದಲ್ಲಿ ಗುತ್ತಿಗೆ ಆಧಾರದಲ್ಲಿ ಹಿರಿಯ ಸಹಾಯಕ ಗ್ರೂಪ್ ಸಿ ಹುದ್ದೆಗೆ ನೇಮಕ ಮಾಡಲಾಗಿತ್ತು. ಈ ಹುದ್ದೆ ಮುಖ್ಯಮಂತ್ರಿ ಅಧಿಕಾರ ಇರುವ ತನಕ ಇಲ್ಲವೇ ಮುಂದಿನ ಆದೇಶ ವರೆಗೆ ಎಂದು ನಮೂದಿಸಲಾಗಿತ್ತು. ಆ ಆದೇಶದಲ್ಲಿ ಬೆಂಗಳೂರಿನ ಮುಖ್ಯಮಂತ್ರಿ ಕಚೇರಿಯಲ್ಲಿ ಎಂದಿದ್ದರೂ ನೂತನ ಕುಮಾರಿ ಅವರ ಅಪೇಕ್ಷೆ ಮೇರೆಗೆ ಅವರನ್ನು ಮಂಗಳೂರಿನ ಜಿಲ್ಲಾಧಿಕಾರಿ ಕಚೇರಿಯಲ್ಲಿ ನಿಯೋಜನೆ ಮೇರೆಗೆ ಕರ್ತವ್ಯ ನಿರ್ವಹಿಸಲು ಅವಕಾಶ ಕಲ್ಪಿಸಲಾಗಿತ್ತು. ಅ.14ರಂದು ನೂತನ ಕುಮಾರಿ ಜಿಲ್ಲಾಧಿಕಾರಿ ಕಚೇರಿಯಲ್ಲಿ ಕರ್ತವ್ಯಕ್ಕೆ ಹಾಜರಾಗಿದ್ದರು. ಈಗ ಸರ್ಕಾರ ಬದಲಾದ್ದರಿಂದ ಕೇವಲ ಏಳು ತಿಂಗಳಲ್ಲೇ ನೂತನ ಕುಮಾರಿ ಅವರು ಕರ್ತವ್ಯವನ್ನು ತ್ಯಜಿಸಬೇಕಾಗಿ ಬಂದಿದೆ.