ಅಕ್ಕಿಯನ್ನು ಮೋದಿಯವರಿಗೆ ಕೇಳಿ ಕೊಡುತ್ತೇನೆ ಎಂದು ಸಿದ್ದು ಹೇಳಿದ್ದರಾ?: ನಳಿನ್ ಕುಮಾರ್ ಕಟೀಲ್
ಚುನಾವಣೆ ಪ್ರಣಾಳಿಕೆಯಲ್ಲಿ ನೀಡಿದ ಭರವಸೆಯಂತೆ ರಾಜ್ಯದ ಜನರಿಗೆ 10 ಕೆಜಿ ಅಕ್ಕಿ ನೀಡಲು ಕಾಂಗ್ರೆಸ್‌ಗೆ ಆಗುತ್ತಿಲ್ಲ. ಅದಕ್ಕಾಗಿ ಬಿಜೆಪಿ ಮತ್ತು ಕೇಂದ್ರ ಸರ್ಕಾರದ ಮೇಲೆ ಇಲ್ಲಸಲ್ಲದ ಆರೋಪ ಮಾಡುತ್ತಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಹೇಳಿದರು.
ಕಲಬುರಗಿ (ಜೂ.24): ಚುನಾವಣೆ ಪ್ರಣಾಳಿಕೆಯಲ್ಲಿ ನೀಡಿದ ಭರವಸೆಯಂತೆ ರಾಜ್ಯದ ಜನರಿಗೆ 10 ಕೆಜಿ ಅಕ್ಕಿ ನೀಡಲು ಕಾಂಗ್ರೆಸ್‌ಗೆ ಆಗುತ್ತಿಲ್ಲ. ಅದಕ್ಕಾಗಿ ಬಿಜೆಪಿ ಮತ್ತು ಕೇಂದ್ರ ಸರ್ಕಾರದ ಮೇಲೆ ಇಲ್ಲಸಲ್ಲದ ಆರೋಪ ಮಾಡುತ್ತಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಹೇಳಿದರು. ಈ ಸಂಬಂಧ ಕಲಬುರಗಿಯಲ್ಲಿ ಶುಕ್ರವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಾನು ಅಕ್ಕಿಯನ್ನು ಮೋದಿಯವರಿಗೆ ಕೇಳಿ ಕೊಡುತ್ತೇನೆ ಎಂದು ಸಿದ್ದರಾಮಯ್ಯ ಹೇಳಿದ್ದರಾ? ಕಾಂಗ್ರೆಸ್ ಪ್ರಣಾಳಿಕೆಯಲ್ಲಿ ಈ ಮಾತನ್ನು ಹೇಳಿತ್ತಾ? ಎಂದು ಪ್ರಶ್ನಿಸಿದ ಅವರು, ಈಗೇಕೆ ಕೇಂದ್ರ ಸರ್ಕಾರದ ಮೇಲೆ, ಬಿಜೆಪಿ ಮೇಲೆ ಆರೋಪ ಮಾಡಬೇಕು ಎಂದು ಪ್ರಶ್ನಿಸಿದರು.
ಕೇಂದ್ರ ಸರ್ಕಾರ 5 ಕೆಜಿ ಅಕ್ಕಿ ನೀಡುತ್ತಿದೆ. ರಾಜ್ಯ ಸರ್ಕಾರ ನುಡಿದಂತೆ ತಾನು ಪ್ರತ್ಯೇಕವಾಗಿ 10 ಕೆ.ಜಿ ನೀಡಿದರೆ ಒಟ್ಟು 15 ಕೆಜಿ ಅಕ್ಕಿ ಬಡ ಜನರಿಗೆ ನೀಡಬೇಕು. ಕೇಂದ್ರಕ್ಕೆ ಕರ್ನಾಟಕವೊಂದೇ ಮುಖ್ಯವಲ್ಲ. ಇತರ ರಾಜ್ಯಗಳಿಗೆ ಅಕ್ಕಿ ಪೂರೈಸುವ ಜವಾಬ್ದಾರಿ ಇದೆ. ಕಾಂಗ್ರೆಸ್ ಸರ್ಕಾರ ಪ್ರತಿ ಬಡ ಕುಟುಂಬಗಳಿಗೆ 10 ಕೆ.ಜಿ. ಉಚಿತ ಅಕ್ಕಿ ನೀಡುವ ಮುನ್ನ ಪ್ರಧಾನಿ ಅಥವಾ ಕೇಂದ್ರ ಆಹಾರ ಸಚಿವರೊಂದಿಗೆ ಚರ್ಚಿಸಿಲ್ಲ. ಹೀಗಾಗಿ ಬೇಕಾದ ಅಕ್ಕಿ ಕೊಡುವ ಯೋಜನೆಗೆ ಅಕ್ಕಿಯನ್ನು ತಾನೆ ಹೊಂದಿಸಿಕೊಳ್ಳಬೇಕು ಎಂದರು.
ವಿದ್ಯುತ್ ಬಿಲ್ ಕಟ್ಟಬೇಡಿ, ಸಂಪರ್ಕ ಕಡಿತಗೊಳಿಸಿದ್ರೆ ನಾವಿದ್ದೇವೆ: ನಳಿನ್ ಕುಮಾರ್ ಕಟೀಲ್
ಈ ರಾಜಕಾರಣ ಯಾಕೆ ಕರ್ನಾಟಕದಲ್ಲಿ ಮಾತ್ರ ಆಗ್ತಿದೆ? ಆಂಧ್ರ, ರಾಜಸ್ಥಾನದಲ್ಲಿ ಯಾಕೆ ಅಕ್ಕಿಯ ರಾಜಕಾರಣ ಆಗ್ತಿಲ್ಲ? ಕಾಂಗ್ರೆಸ್ ಭಾಗ್ಯಗಗಳನ್ನ ಕೊಡೋದಕ್ಕೆ ಆಗದೆ ಅವರಲ್ಲಿನ ಆಂತರಿಕ ಕಚ್ಚಾಟ ಆಗುತ್ತೆ. ಒಂದು ವರ್ಷದಲ್ಲಿ ಕಾಂಗ್ರೆಸ್ ಹಣೆ ಬರಹ ಏನಾಗುತ್ತೆ ನೋಡಿ ಎಂದರು. ಕೇಂದ್ರ ಸರ್ಕಾರ ರಾಜ್ಯದೊಂದಿಗೆ ದ್ವೇಷದ ರಾಜಕಾರಣ ಮಾಡುತ್ತಿಲ್ಲ. ಬದಲಾಗಿ ಸಿದ್ದರಾಮಯ್ಯ ಅವರೆ ದ್ವೇಷದ ರಾಜಕಾರಣ ಮಾಡುತ್ತಿದ್ದಾರೆ. ನಮ್ಮ ಸರ್ಕಾರ ಜಾರಿಗೊಳಿಸಿದ್ದ ಮತಾಂತರ ನಿಷೇಧ ಕಾಯ್ದೆ, ಗೋಹತ್ಯೆ ನಿಷೇಧ ಕಾಯ್ದೆ, ಪಠ್ಯ ಪುಸ್ತಕ ಪರಿಷ್ಕರಣೆಯನ್ನು ವಾಪಸ್ ಪಡೆದಿದ್ದಾರೆ.
ಹಿಂದೂ ಸಂಘಟನೆಗಳ ಕಾರ್ಯಕರ್ತರ ವಿರುದ್ಧ ಪ್ರಕರಣ ದಾಖಲಿಸುತ್ತಿದ್ದಾರೆ ಎಂದರು. ಮೋದಿ ಸರ್ಕಾರ ಆಡಳಿತಕ್ಕೆ ಬಂದು 9 ವರ್ಷ ಕಳೆದಿದೆ. ಅದರ ಹಿನ್ನೆಲೆ ರಾಜ್ಯದ ಎಲ್ಲಾ ಕ್ಷೇತ್ರಗಳಲ್ಲಿ ಕೇಂದ್ರ ಸರ್ಕಾರದ ಸಾಧನೆ ಕುರಿತು ಸಮಾವೇಶಗಳು ಹಮ್ಮಿಕೊಳ್ಳಲಾಗಿದೆ. ಕಳೆದ ಒಂಬತ್ತು ವರ್ಷ ದಲ್ಲಿ ಕೇಂದ್ರ ಸರ್ಕಾರದ ಜನಪರ ಯೋಜನೆಗಳ ಕುರಿತು ನಮ್ಮ ಕಾರ್ಯಕರ್ತರು ಮನೆ ಮನೆಗೆ ತೆರಳಿ ಪ್ರಚಾರ ಮತ್ತು ಅರ್ಹ ಫಲಾನುಭವಿಗಳಿಗೆ ಯೋಜನೆಗಳನ್ನು ಮುಟ್ಟಿಸುವ ಕೆಲಸ ಮಾಡುತ್ತಾರೆ ಎಂದರು.
ಬಿಜೆಪಿ ಶಾಸಕಾಂಗ ಪಕ್ಷದ ನಾಯಕನ ಆಯ್ಕೆ: ಅಭಿಪ್ರಾಯ ಕೇಳಿದ ಅರುಣ್‌ಸಿಂಗ್
ನಾಳೆಯಿಂದ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ, ಬಸವರಾಜ ಬೊಮ್ಮಾಯಿ, ಸೇರಿದಂತೆ ರಾಜ್ಯದ ಹಲವು ನಾಯಕರು ರಾಜ್ಯ ಪ್ರವಾಸ ಮಾಡಿ ಕೇಂದ್ರ ಸರ್ಕಾರದ ಸಾಧನೆಗಳನ್ನು ರಾಜ್ಯದ ಜನರಿಗೆ ತಿಳಿಸುವ ಕೆಲಸ ಮಾಡುತ್ತಾರೆ. ಬಿಜೆಪಿ ಸರ್ಕಾರದ ಯೋಜನೆಗಳ ಬಗ್ಗೆ ಜನರಿಗೆ ಮುಟ್ಟಿಸುವ ಕೆಲಸ ಮಾಡುತ್ತೇವೆ ಎಂದು ಹೇಳಿದರು. ಸುದ್ದಿಗೋಷ್ಠಿಯಲ್ಲಿ ಮಾಜಿ ಸಚಿವ ಮಾಲಿಕಯ್ಯ ಗುತ್ತೇದಾರ, ಶಾಸಕ ಬಸವರಾಜ ಮತ್ತಿಮೂಡ, ಮುಖಂಡರಾದ ಶಿವರಾಜ ಪಾಟೀಲ ರದ್ದೇವಾಡಿ, ಅಮರನಾಥ ಪಾಟೀಲ ಸೇರಿದಂತೆ ಇತರರು ಉಪಸ್ಥಿತರಿದ್ದರು.