ಜನರು ವಿದ್ಯುತ್ ಬಿಲ್ ಕಟ್ಟಬಾರದು ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಕರೆ ನೀಡಿದ್ದಾರೆ. ಬುಧವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ತಮ್ಮ ಪಕ್ಷದ ಸರ್ಕಾರ ಬಂದ ಮೇಲೆ ವಿದ್ಯುತ್ ಬಿಲ್ ಕಟ್ಟಬೇಡಿ ಎಂಬ ಮಾತನ್ನು ಸಿದ್ದರಾಮಯ್ಯ ಅವರೇ ಹೇಳಿದ್ದರು.
ಬೆಂಗಳೂರು (ಮೇ.18): ಜನರು ವಿದ್ಯುತ್ ಬಿಲ್ ಕಟ್ಟಬಾರದು ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಕರೆ ನೀಡಿದ್ದಾರೆ. ಬುಧವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ತಮ್ಮ ಪಕ್ಷದ ಸರ್ಕಾರ ಬಂದ ಮೇಲೆ ವಿದ್ಯುತ್ ಬಿಲ್ ಕಟ್ಟಬೇಡಿ ಎಂಬ ಮಾತನ್ನು ಸಿದ್ದರಾಮಯ್ಯ ಅವರೇ ಹೇಳಿದ್ದರು. ತಮಗೂ ಸೇರಿಸಿ ಎಲ್ಲರಿಗೂ ವಿದ್ಯುತ್ ಉಚಿತ ಎಂದಿದ್ದರು. ಹೀಗಾಗಿ, ಜನರು ಯಾಕೆ ಬಿಲ್ ಕಟ್ಟುತ್ತಾರೆ ಹೇಳಿ. ಕಟ್ಟಬಾರದು. ಕಟ್ಟುವ ಅಗತ್ಯವಿಲ್ಲ.
ಜನರಿಗೂ ವಿನಂತಿ ಮಾಡುತ್ತೇನೆ. ನನ್ನ ಲೆಕ್ಕದಲ್ಲಿ ಯಾರಿಗೂ ಬಿಲ್ ಕಟ್ಟುವ ಅವಶ್ಯಕತೆಯಿಲ್ಲ ಎಂದು ಪ್ರತಿಪಾದಿಸಿದರು. ಪ್ರಶ್ನೆಯೊಂದಕ್ಕೆ ಉತ್ತರಿಸಿದ ಅವರು, ಕಾಂಗ್ರೆಸ್ಸಿನವರು ಯಾರನ್ನಾದರೂ ಮುಖ್ಯಮಂತ್ರಿಯನ್ನಾಗಿ ಮಾಡಲಿ. ಅದು ಅವರ ಆಂತರಿಕ ವಿಚಾರ. ಜನರು ಅವರಿಗೆ ಬಹುಮತ ಕೊಟ್ಟಿದ್ದಾರೆ. ನಾವು ಅದನ್ನು ಸ್ವೀಕಾರ ಮಾಡಿ ವಿರೋಧ ಪಕ್ಷವಾಗಿ ರಚನಾತ್ಮಕ ಕೆಲಸ ಮಾಡಲಿದ್ದೇವೆ ಎಂದರು.
ನಾವು ಸಿದ್ಧಾಂತದ ರಾಜಕಾರಣಕ್ಕಾಗಿ ಬಂದವರು: ಸಿ.ಟಿ.ರವಿ
ಮುಂದಿನ ವಾರ ರಾಜ್ಯ ಬಿಜೆಪಿ ಶಾಸಕಾಂಗ ಪಕ್ಷದ ನಾಯಕ ಆಯ್ಕೆ: ಮುಂದಿನ ವಾರ ಬಿಜೆಪಿ ಶಾಸಕಾಂಗ ಪಕ್ಷದ ನಾಯಕನ ಆಯ್ಕೆ ನಡೆಯಲಿದೆ ಎಂದು ಪಕ್ಷದ ರಾಜ್ಯಾಧ್ಯಕ್ಷ ನಳಿನ್‌ಕುಮಾರ್ ಕಟೀಲ್ ತಿಳಿಸಿದ್ದಾರೆ. ಬುಧವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈ ಒಂದು ವಾರ ನೂತನ ಶಾಸಕರು ತಮ್ಮ ಕ್ಷೇತ್ರದಲ್ಲಿದ್ದು ಜನರಿಗೆ ಮತ್ತು ಕಾರ್ಯಕರ್ತರಿಗೆ ಕೃತಜ್ಞತೆ ಸಲ್ಲಿಸಲಿದ್ದಾರೆ. ಬಳಿಕ ಮುಂದಿನ ವಾರ ಶಾಸಕಾಂಗ ಪಕ್ಷದ ಸಭೆ ಕರೆದು ನಾಯಕನ ಆಯ್ಕೆ ಮಾಡಲಾಗುವುದು ಎಂದು ಹೇಳಿದರು.
ಕಟೀಲ್ ಚಿತ್ರಕ್ಕೆ ಚಪ್ಪಲಿ ಹಾರ ಹಾಕಿದ್ದವರಿಗೆ ಥರ್ಡ್ ಡಿಗ್ರಿ ಟ್ರೀಟ್ಮೆಂಟ್?: ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಮತ್ತು ಮಾಜಿ ಮುಖ್ಯಮಂತ್ರಿ ಡಿ.ವಿ.ಸದಾನಂದ ಗೌಡ ಭಾವಚಿತ್ರವಿರುವ ಬ್ಯಾನರ್ ಅಳವಡಿಸಿ ಅದಕ್ಕೆ ಚಪ್ಪಲಿ ಹಾರ ಹಾಕಿದ ಪ್ರಕರಣದಲ್ಲಿ ಬಂಧಿತರಾಗಿದ್ದ ಆರೋಪಿಗಳಿಗೆ ಪೊಲೀಸರು ಥರ್ಡ್ ಡಿಗ್ರಿ ಟ್ರೀಟ್ಮೆಂಟ್ ನೀಡಿದ್ದಾರೆ ಎಂಬ ಆರೋಪ ವ್ಯಾಪಕವಾಗಿದೆ.
ಪೊಲೀಸರು ಥಳಿಸಿದ ಕಾರಣ ಅವರು ಎದ್ದು ನಡೆಯಲಾಗದ ಸ್ಥಿತಿಯಲ್ಲಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದ್ದು, ಬಂಧಿತ ಆರೋಪಿಗಳ ಪೈಕಿ ಕೆಲವರನ್ನು ಪುತ್ತೂರು ಪಕ್ಷೇತರ ಅಭ್ಯ ರ್ಥಿಯಾಗಿದ್ದ ಅರುಣ್ ಕುಮಾರ್ ಪುತ್ತಿಲ ಅವರು ಜಾಮೀನು ಮೂಲಕ ಠಾಣೆಯಿಂದ ಕರೆದೊಯ್ದಿದ್ದಾರೆ ಎನ್ನಲಾಗಿದೆ. ಆರೋಪಿಗಳು ನಡೆದಾಡಲೂ ಕಷ್ಟಪಡುವ ಹಾಗೂ ದೇಹದ ಮೇಲೆ ಗಂಭೀರ ಗಾಯಗೊಂಡಿರುವ ಚಿತ್ರಗಳು ಸಾಮಾಜಿಕ ಜಾಲತಾಣದಲ್ಲಿ ಈಗ ಹರಿದಾಡುತ್ತಿವೆ.
ಎಂಟಿಬಿ ವಿರುದ್ಧ ಮಾನನಷ್ಟ ಮೊಕದ್ದಮೆ ಹಾಕುವೆ: ಶಾಸಕ ಶರತ್ ಬಚ್ಚೇಗೌಡ
ಒತ್ತಡಕ್ಕೆ ಮಣಿದು ಚಿತ್ರಹಿಂಸೆ?: ಪುತ್ತೂರು ತಾಲೂಕಿನ ನರಿಮೊಗರು ನಿವಾಸಿಗಳಾದ ವಿಶ್ವನಾಥ, ಮಾಧವ, ಅಭಿ ಯಾನೆ ಅವಿನಾಶ್, ಶಿವರಾಮ್, ಚೈತ್ರೇಶ್, ಈಶ್ವರ್, ನಿಶಾಂತ್, ದೀಕ್ಷಿತ್, ಗುರುಪ್ರಸಾದ್ ಬಂಧಿತ ಆರೋಪಿಗಳು. ಬಂಧಿತ ಆರೋಪಿಗಳಿಗೆ ಬಿಜೆಪಿ ರಾಜ್ಯಾಧ್ಯಕ್ಷರ ಹಾಗೂ ಕೆಲವು ಪ್ರಭಾವಿಗಳ ಒತ್ತಡಕ್ಕೆ ಒಳಗಾಗಿ ಪೊಲೀಸರು ಆರೋ ಪಿಗಳಿಗೆ ಚಿತ್ರಹಿಂಸೆ ನೀಡಿದ್ದಾರೆ ಎಂದು ಜಾಲತಾಣಗಳಲ್ಲಿ ಆರೋಪಿಸಲಾಗಿದೆ. ಈ ಬಗ್ಗೆ ಸತ್ಯಾಂಶ ತಿಳಿದುಕೊಳ್ಳಲು ವಿಚಾರಣೆ ಕೈಗೊಳ್ಳಲಾಗುವುದು ಎಂದು ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ತಿಳಿಸಿದರು.
