ಬೆಂಗಳೂರು (ನ.12):  ವಿಧಾನಪರಿಷತ್‌ನ ನಾಲ್ಕು ಕ್ಷೇತ್ರಗಳನ್ನೂ ತನ್ನ ತೆಕ್ಕೆಗೆ ತೆಗೆದುಕೊಳ್ಳುವಲ್ಲಿ ಬಿಜೆಪಿ ಯಶಸ್ವಿಯಾಗಿದ್ದು, ಆಗ್ನೇಯ ಪದವೀಧರ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಚಿದಾನಂದಗೌಡ ಗೆಲುವಿನ ನಗೆ ಬೀರಿದ್ದಾರೆ.

ಬಿಜೆಪಿ ಅಭ್ಯರ್ಥಿ ಚಿದಾನಂದಗೌಡ ಅವರು ಪ್ರತಿಸ್ಪರ್ಧಿ ಹಾಗೂ ಬಿಜೆಪಿ ಬಂಡಾಯ ಅಭ್ಯರ್ಥಿ ಡಿ.ಟಿ.ಶ್ರೀನಿವಾಸ ವಿರುದ್ಧ 7,125 ಮತಗಳ ಅಂತರದಲ್ಲಿ ಜಯಗಳಿಸಿದ್ದಾರೆ. ಒಟ್ಟು 30,976 ಮತಗಳನ್ನು ಪಡೆದು ಜಯಗಳಿಸಿ ಮೇಲ್ಮನೆಗೆ ಪ್ರವೇಶಿಸಲಿದ್ದಾರೆ.

ಮಂಗಳವಾರ ಬೆಂಗಳೂರು ಶಿಕ್ಷಕರ, ಈಶಾನ್ಯ ಶಿಕ್ಷಕರ ಮತ್ತು ಪಶ್ಚಿಮ ಪದವೀಧರ ಕ್ಷೇತ್ರದ ಫಲಿತಾಂಶ ಪ್ರಕಟವಾಗಿದ್ದು, ಬಿಜೆಪಿ ಜಯಭೇರಿ ಸಾಧಿಸಿತ್ತು. ಮಂಗಳವಾರ ಸಂಜೆಯ ವೇಳೆಗೆ ಆಗ್ನೇಯ ಪದವೀಧರ ಕ್ಷೇತ್ರದ ಮತ ಎಣಿಕೆ ಪ್ರಾರಂಭವಾಗಿ ಬುಧವಾರ ಸಂಜೆಯ ವೇಳೆಗೆ ಮುಕ್ತಾಯಗೊಂಡಿತು.

ಚಿದಾನಂದಗೌಡ ಅವರ ಪ್ರತಿಸ್ಪರ್ಧಿಯಾಗಿರುವ ಬಿಜೆಪಿ ಶಾಸಕಿ ಪೂರ್ಣಿಮಾ ಪತಿ ಹಾಗೂ ಬಿಜೆಪಿ ಬಂಡಾಯ ಅಭ್ಯರ್ಥಿ ಡಿ.ಟಿ.ಶ್ರೀನಿವಾಸ 23,851 ಮತಗಳನ್ನು ಪಡೆದು ಎರಡನೇ ಸ್ಥಾನದಲ್ಲಿದ್ದಾರೆ. ಮತ್ತೊಮ್ಮೆ ಪುನರಾಯ್ಕೆ ಬಯಸಿ ಕಣಕ್ಕಿಳಿದಿದ್ದ ಜೆಡಿಎಸ್‌ ಅಭ್ಯರ್ಥಿ ಚೌಡರೆಡ್ಡಿ ತೂಪಲ್ಲಿಗೆ ಹಿನ್ನೆಡೆಯಾಗಿದ್ದು, 18,810 ಮತಗಳನ್ನು ಪಡೆದುಕೊಂಡು ಮೂರನೇ ಸ್ಥಾನಕ್ಕೆ ತಳ್ಳಲ್ಪಟ್ಟಿದ್ದಾರೆ. ಜೆಡಿಎಸ್‌ನಿಂದ ಕಾಂಗ್ರೆಸ್‌ಗೆ ವಲಸೆ ಬಂದ ರಮೇಶ್‌ ಬಾಬು 9093 ಮತಗಳನ್ನು ಪಡೆದು ನಾಲ್ಕನೇ ಸ್ಥಾನಕ್ಕೆ ತೃಪ್ತಿಪಟ್ಟುಕೊಳ್ಳುವಂತಾಗಿದೆ.

ಸುಗಮವಾಯ್ತು ಈ ಮೂವರ ಮಂತ್ರಿಗಿರಿ ಹಾದಿ ...

ಮಂಗಳವಾರ ಮತ ಎಣಿಕೆ ಆರಂಭಗೊಂಡಾಗ ಜೆಡಿಎಸ್‌ ಅಭ್ಯರ್ಥಿ ಚೌಡರೆಡ್ಡಿ ತೂಪಲ್ಲಿ ಅಧಿಕ ಮತಗಳೊಂದಿಗೆ ಮುನ್ನಡೆ ಕಾಯ್ದುಕೊಂಡಿದ್ದರು. ನಂತರದ ಸುತ್ತಿನಲ್ಲಿ ಬಿಜೆಪಿ ಬಂಡಾಯ ಅಭ್ಯರ್ಥಿ ಮತ್ತು ಶಾಸಕಿ ಪೂರ್ಣಿಮಾ ಅವರ ಪತಿ ಡಿ.ಟಿ.ಶ್ರೀನಿವಾಸ ಅವರು ಹೆಚ್ಚಿನ ಮತಗಳನ್ನು ಪಡೆದು ಮುನ್ನಡೆ ಸಾಧಿಸಿ ಅಚ್ಚರಿಯನ್ನುಂಟು ಮಾಡಿದರು.

ತರುವಾಯದ ಸುತ್ತಿನಲ್ಲಿ ಮತ ಎಣಿಕೆ ನಡೆದಾಗ ಬಿಜೆಪಿ ಅಭ್ಯರ್ಥಿ ಚಿದಾನಂದಗೌಡ ಅಧಿಕ ಮತಗಳನ್ನು ಗಳಿಸುವ ಮೂಲಕ ಮುನ್ನಡೆ ಕಾಯ್ದುಕೊಂಡರು. ಅಂತಿಮವಾಗಿ 30,976 ಮತಗಳನ್ನು ಪಡೆದು ಗೆಲುವಿನ ನಗೆ ಬೀರಿದರು. ಮಂಗಳವಾರ ಪ್ರಕಟವಾದ ಫಲಿತಾಂಶದಲ್ಲಿ ಬೆಂಗಳೂರು ಶಿಕ್ಷಕರ ಕ್ಷೇತ್ರದಲ್ಲಿ ಪುಟ್ಟಣ್ಣ, ಈಶಾನ್ಯ ಶಿಕ್ಷಕರ ಕ್ಷೇತ್ರದಲ್ಲಿ ಶಶಿಲ್‌ ನಮೋಶಿ ಮತ್ತು ಪಶ್ಚಿಮ ಪದವೀಧರ ಕ್ಷೇತ್ರದಲ್ಲಿ ಎಸ್‌.ವಿ.ಸಂಕನೂರು ಗೆಲುವು ಸಾಧಿಸಿದ್ದಾರೆ. ನಾಲ್ಕು ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿಗಳು ಜಯಗಳಿಸಿ ವಿಧಾನಪರಿಷತ್‌ನಲ್ಲಿ ಆಡಳಿತರೂಢ ಬಿಜೆಪಿ ಪಾರುಪತ್ಯ ಮೆರೆದಿದೆ.