ಡಿ.ಕೆ. ಶಿವಕುಮಾರ್ ಅವರು ಮುಖ್ಯಮಂತ್ರಿಯಾದ ಹಿನ್ನೆಲೆಯಲ್ಲಿ, 'ಒಬ್ಬ ವ್ಯಕ್ತಿಗೆ ಒಂದೇ ಹುದ್ದೆ' ನೀತಿಯಂತೆ ಕೆಪಿಸಿಸಿಗೆ ನೂತನ ಅಧ್ಯಕ್ಷರ ನೇಮಕವಾಗಿದೆ. ಎಐಸಿಸಿ ಹಿರಿಯ ನಾಯಕ ಬಿ.ಕೆ. ಹರಿಪ್ರಸಾದ್ ಅವರನ್ನು ಈ ಸ್ಥಾನಕ್ಕೆ ನೇಮಿಸಿ ಅಧಿಕೃತ ಆದೇಶ ಹೊರಡಿಸಿದೆ.
ಬೆಂಗಳೂರು (ಜೂ.03): ರಾಜ್ಯ ರಾಜಕಾರಣದಲ್ಲಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ (ಕೆಪಿಸಿಸಿ) ಅಧ್ಯಕ್ಷರಾಗಿದ್ದ ಡಿ.ಕೆ. ಶಿವಕುಮಾರ್ ಅವರು ಕರ್ನಾಟಕದ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿದ ಬೆನ್ನಲ್ಲೇ, ಹೊಸ ಸಾರಥಿಯನ್ನು ನೇಮಕ ಮಾಡಲಾಗಿದೆ. ಹಿರಿಯ ನಾಯಕ ಬಿ.ಕೆ. ಹರಿಪ್ರಸಾದ್ ಅವರನ್ನು ಕೆಪಿಸಿಸಿ ನೂತನ ಅಧ್ಯಕ್ಷರನ್ನಾಗಿ ಎಐಸಿಸಿ (AICC) ನೇಮಕ ಮಾಡಿ ಅಧಿಕೃತ ಆದೇಶ ಹೊರಡಿಸಿದೆ.
ಡಿಕೆಶಿ ಉತ್ತರಾಧಿಕಾರಿಯಾಗಿ ಹರಿಪ್ರಸಾದ್:
ಕಳೆದ ಕೆಲವು ವರ್ಷಗಳಿಂದ ಕೆಪಿಸಿಸಿ ಅಧ್ಯಕ್ಷರಾಗಿ ಪಕ್ಷವನ್ನು ಯಶಸ್ವಿಯಾಗಿ ಮುನ್ನಡೆಸಿ, ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬರುವಲ್ಲಿ ಪ್ರಮುಖ ಪಾತ್ರ ವಹಿಸಿದ್ದ ಡಿ.ಕೆ. ಶಿವಕುಮಾರ್ ಅವರು ಇದೀಗ ರಾಜ್ಯದ ಮುಖ್ಯಮಂತ್ರಿಯಾಗಿದ್ದಾರೆ. 'ಒಬ್ಬ ವ್ಯಕ್ತಿಗೆ ಒಂದೇ ಹುದ್ದೆ' ಎಂಬ ಕಾಂಗ್ರೆಸ್‌ನ ಉನ್ನತ ತತ್ವದ ಅಡಿಯಲ್ಲಿ, ಶಿವಕುಮಾರ್ ಅವರು ಅಧ್ಯಕ್ಷ ಸ್ಥಾನವನ್ನು ತೆರವುಗೊಳಿಸಿದ್ದಾರೆ. ಅವರ ಸ್ಥಾನಕ್ಕೆ ಈಗ ಅನುಭವಿ ನಾಯಕ ಬಿ.ಕೆ. ಹರಿಪ್ರಸಾದ್ ಅವರನ್ನು ತರಲಾಗಿದೆ. ಎಐಸಿಸಿ ಸಂಘಟನಾ ಪ್ರಧಾನ ಕಾರ್ಯದರ್ಶಿ ಕೆ.ಸಿ. ವೇಣುಗೋಪಾಲ್ ಅವರು ಈ ಕುರಿತು ಪ್ರಕಟಣೆ ಹೊರಡಿಸಿದ್ದು, ತಕ್ಷಣದಿಂದಲೇ ಜಾರಿಗೆ ಬರುವಂತೆ ಹರಿಪ್ರಸಾದ್ ಅಧಿಕಾರ ವಹಿಸಿಕೊಳ್ಳಲಿದ್ದಾರೆ.
ಸತೀಶ್ ಜಾರಕಿಹೊಳಿ, ಈಶ್ವರ ಖಂಡ್ರೆ ರೇಸ್‌ನಲ್ಲಿದ್ದರು:
ಕೆಪಿಸಿಸಿ ಅಧ್ಯಕ್ಷ ಗಾದಿಗೆ ಸತೀಶ್ ಜಾರಕಿಹೊಳಿ ಮತ್ತು ಈಶ್ವರ ಖಂಡ್ರೆ ಅವರ ಹೆಸರುಗಳು ಪ್ರಬಲವಾಗಿ ಕೇಳಿಬಂದಿದ್ದವು. ಇಬ್ಬರೂ ನಾಯಕರು ಅಧ್ಯಕ್ಷ ಸ್ಥಾನದ ಪ್ರಬಲ ಆಕಾಂಕ್ಷಿಗಳಾಗಿದ್ದರು. ಆದರೆ, ಕಾಂಗ್ರೆಸ್ ಹೈಕಮಾಂಡ್ ಇತ್ತೀಚೆಗೆ ಜಾರಿಗೆ ತಂದಿರುವ 'ಒಬ್ಬರಿಗೆ ಒಂದೇ ಸ್ಥಾನಮಾನ' ಎಂಬ ನಿರ್ಣಯದ ಹಿನ್ನೆಲೆಯಲ್ಲಿ ಈ ಬದಲಾವಣೆ ಮಾಡಲಾಗಿದೆ. ಸತೀಶ್ ಜಾರಕಿಹೊಳಿ ಮತ್ತು ಈಶ್ವರ ಖಂಡ್ರೆ ಅವರು ಈಗಾಗಲೇ ಸಚಿವ ಸಂಪುಟ ಸೇರಿರುವುದರಿಂದ, ಅವರಿಗೆ ಅಧ್ಯಕ್ಷ ಸ್ಥಾನ ನೀಡುವುದು ನಿಯಮಕ್ಕೆ ವಿರುದ್ಧವಾಗುತ್ತಿತ್ತು. ಹೀಗಾಗಿ, ಯಾವುದೇ ಸಚಿವ ಸ್ಥಾನದ ಜವಾಬ್ದಾರಿ ಇಲ್ಲದ ಹಿರಿಯ ನಾಯಕ ಬಿ.ಕೆ. ಹರಿಪ್ರಸಾದ್ ಅವರ ಹೆಗಲಿಗೆ ಪಕ್ಷ ಸಂಘಟನೆಯ ಹೊಣೆ ನೀಡಲಾಗಿದೆ.
ಡಿಕೆಶಿ ಕಾರ್ಯಕ್ಕೆ ಹೈಕಮಾಂಡ್ ಶ್ಲಾಘನೆ:
ನಿರ್ಗಮಿತ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರ ಸೇವೆಯನ್ನು ಎಐಸಿಸಿ ಮುಕ್ತಕಂಠದಿಂದ ಪ್ರಶಂಸಿಸಿದೆ. ಸಂಕಷ್ಟದ ಸಮಯದಲ್ಲಿ ಪಕ್ಷದ ಚುಕ್ಕಾಣಿ ಹಿಡಿದು, ಕಾರ್ಯಕರ್ತರನ್ನು ಒಗ್ಗೂಡಿಸಿ ಚುನಾವಣೆಯಲ್ಲಿ ದೊಡ್ಡ ಜಯ ತಂದುಕೊಟ್ಟ ಡಿಕೆಶಿ ಅವರ ಕೊಡುಗೆಯನ್ನು ಕೆ.ಸಿ. ವೇಣುಗೋಪಾಲ್ ಅವರು ತಮ್ಮ ಆದೇಶದಲ್ಲಿ ವಿಶೇಷವಾಗಿ ಸ್ಮರಿಸಿದ್ದಾರೆ.
ಬಿ.ಕೆ. ಹರಿಪ್ರಸಾದ್ ಅವರು ರಾಷ್ಟ್ರ ಹಾಗೂ ರಾಜ್ಯ ರಾಜಕಾರಣದಲ್ಲಿ ದಶಕಗಳ ಕಾಲ ಕೆಲಸ ಮಾಡಿದ ಅನುಭವ ಹೊಂದಿದ್ದಾರೆ. ಎಐಸಿಸಿ ಪ್ರಧಾನ ಕಾರ್ಯದರ್ಶಿಯಾಗಿ ಹಲವು ರಾಜ್ಯಗಳ ಉಸ್ತುವಾರಿ ವಹಿಸಿದ್ದ ಅವರಿಗೆ ಈಗ ಸ್ವಂತ ರಾಜ್ಯದ ಪಕ್ಷವನ್ನು ಸಂಘಟಿಸುವ ಸವಾಲು ಎದುರಾಗಿದೆ. ಸರ್ಕಾರದ ಯೋಜನೆಗಳನ್ನು ಜನರಿಗೆ ತಲುಪಿಸುವ ಮತ್ತು ಪಕ್ಷ ಹಾಗೂ ಸರ್ಕಾರದ ನಡುವೆ ಕೊಂಡಿಯಾಗಿ ಕೆಲಸ ಮಾಡುವ ದೊಡ್ಡ ಜವಾಬ್ದಾರಿ ಈಗ ಅವರ ಮೇಲಿದೆ.
ವಿಧಾನ ಪರಿಷತ್ ಚುನಾವಣೆಗೂ ಹೆಸರು ಘೋಷಣೆ
ಇನ್ನು ರಾಜ್ಯದಲ್ಲಿ 7 ವಿಧಾನ ಪರಿಷತ್ ಸ್ಥಾನಗಳು ತೆರವಾಗಲಿವೆ. ಕಾಂಗ್ರೆಸ್‌ನ ಬಿ.ಕೆ.ಹರಿಪ್ರಸಾದ್, ನಾಸೀರ್ ಅಹಮ್ಮದ್, ತಿಪ್ಪಣ್ಣಪ್ಪ, ಬಿಜೆಪಿಯ ಪ್ರತಾಪ್ ಸಿಂಹ ನಾಯಕ್, ಎಂಟಿಬಿ ನಾಗರಾಜ್, ಸುನೀಲ್ ವಲ್ಯಾಪುರ್ ಹಾಗೂ ಜೆಡಿಎಸ್‌ನ ಗೋವಿಂದರಾಜು ನಿವೃತ್ತಿಯಾಗಲಿದ್ದಾರೆ. ಈ ಹಿನ್ನೆಲೆಯಲ್ಲಿ 7 ಸ್ಥಾನಗಳಿಗೆ ಚುನಾವಣೆ ಮೂಲಕ ಅಭ್ಯರ್ಥಿಗಳನ್ನು ಆಯ್ಕೆ ಮಾಡುವುದಕ್ಕೆ ಚುನಾವಣಾ ಆಯೋಗವು ಚುನಾವಣೆಯನ್ನು ಘೋಷಣೆ ಮಾಡಿದೆ. ಜೂ.8 ನಾಮಪತ್ರ ಸಲ್ಲಿಕೆಗೆ ಕೊನೆಯ ದಿನವಾಗಿದೆ. ಜೂ.18ರಂದು ಮತದಾನ ನಡೆಯಲಿದ್ದು, ಅಂದೇ ಮತ ಎಣಿಕೆ ನಡೆದು ಫಲಿತಾಂಶ ಪ್ರಕಟವಾಗಲಿದೆ. ಈ ಏಳು ಸ್ಥಾನಗಳ ಪೈಕಿ ಕಾಂಗ್ರೆಸ್ ಮತ್ತು ಬಿಜೆಪಿಯ ತಲಾ ಮೂವರು ಮತ್ತು ಜೆಡಿಎಸ್‌ನ ಓರ್ವ ಸದಸ್ಯರ ಅವಧಿ ಜೂ.30ರಂದು ಅಂತ್ಯಗೊಳ್ಳಲಿದೆ.ಇದೀಗ ಕಾಂಗ್ರೆಸ್‌ನಿಂದ 4 ಅಭ್ಯರ್ಥಿಗಳನ್ನು ಘೋಷಣೆ ಮಾಡಿದೆ. ಅದರಲ್ಲಿ ಬಿ.ಕೆ. ಹರಿಪ್ರಸಾದ್, ತಿಪ್ಪಣ್ಣಪ್ಪ ಕಮಕನೂರ್ ಹೆಸರನ್ನು ಮರು ಆಯ್ಕೆ ಮಾಡಲಾಗಿದೆ. ಹೊಸಬರಾಗಿ ಪಿ.ವಿ. ಮೋಹನ್ ಹಾಗೂ ಶಿವಣ್ಣ ಮಳವಳ್ಳಿ ಅವರನ್ನು ಅಭ್ಯರ್ಥಿಯನ್ನಾಗಿ ಘೋಷಣೆ ಮಾಡಲಾಗಿದೆ.


