ಮತ್ತೊಮ್ಮೆ ಆರ್‌ಎಸ್‌ಎಸ್‌ ನಿಷೇಧಿಸುವ ಶಕ್ತಿ ಕಾಂಗ್ರೆಸ್ ಪಕ್ಷಕ್ಕೆ ಇಲ್ಲ. ನಿಷೇಧ ಕೋರಿ ಮುಖ್ಯಮಂತ್ರಿಯವರಿಗೆ ಪತ್ರ ಬರೆದಿರುವ ಸಚಿವ ಪ್ರಿಯಾಂಕ್ ಖರ್ಗೆ ಮೂರ್ಖತನ ಪ್ರದರ್ಶಿಸಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಕಿಡಿಕಾರಿದ್ದಾರೆ.

ಬೆಂಗಳೂರು (ಅ.13): ಮತ್ತೊಮ್ಮೆ ಆರ್‌ಎಸ್‌ಎಸ್‌ ನಿಷೇಧಿಸುವ ಶಕ್ತಿ ಕಾಂಗ್ರೆಸ್ ಪಕ್ಷಕ್ಕೆ ಇಲ್ಲ. ನಿಷೇಧ ಕೋರಿ ಮುಖ್ಯಮಂತ್ರಿಯವರಿಗೆ ಪತ್ರ ಬರೆದಿರುವ ಸಚಿವ ಪ್ರಿಯಾಂಕ್ ಖರ್ಗೆ ಮೂರ್ಖತನ ಪ್ರದರ್ಶಿಸಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಕಿಡಿಕಾರಿದ್ದಾರೆ. ಬಿಜೆಪಿ ರಾಜ್ಯ ಕಚೇರಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ, ರಾಷ್ಟ್ರೀಯ ಸ್ವಯಂಸೇವಕ ಸಂಘದ ಹಿನ್ನೆಲೆ, ಕಾರ್ಯ ಚಟುವಟಿಕೆ ಕುರಿತು ಮಾಹಿತಿ ಕೊರತೆ ಇರುವವರು ಕೇವಲ ಪ್ರಚಾರಕ್ಕಾಗಿ, ಚಟದಿಂದ ಮಾತನಾಡುವವರು ಇಂಥ ಹೇಳಿಕೆ ನೀಡಲು ಸಾಧ್ಯ ಎಂದು ನುಡಿದರು.

ಹಿಂದೆಯೂ ಎರಡ್ಮೂರು ಬಾರಿ ಇದೇ ರೀತಿ ಆರ್‌ಎಸ್‌ಎಸ್ ಅನ್ನು ಕಾಂಗ್ರೆಸ್ ಪಕ್ಷ ನಿಷೇಧಿಸಿತ್ತು. ಅದೇ ಕಾಂಗ್ರೆಸ್ ಪಕ್ಷ ನಿಷೇಧವನ್ನು ಹಿಂಪಡೆದ ಉದಾಹರಣೆ ದೇಶದ ಮುಂದಿದೆ. ಭಾರತ-ಚೀನಾ ಯುದ್ಧದ ಸಂದರ್ಭದಲ್ಲಿ ಆರ್‌ಎಸ್‌ಎಸ್‌ ಚಟುವಟಿಕೆ ಗಮನಿಸಿ, ಶ್ಲಾಘಿಸಿ ಅಂದಿನ ಗಣರಾಜ್ಯೋತ್ಸವ ಪರೇಡ್‌ನಲ್ಲಿ ಆರ್‌ಎಸ್‌ಎಸ್‌ಗೆ ಇದೇ ಕಾಂಗ್ರೆಸ್ ಪಕ್ಷ ಅವಕಾಶ ಮಾಡಿಕೊಟ್ಟಿದ್ದನ್ನು ಪ್ರಿಯಾಂಕ್ ಖರ್ಗೆ ನೆನೆಪಿಸಿಕೊಳ್ಳಬೇಕು ಎಂದು ಹೇಳಿದರು. ಪ್ರಿಯಾಂಕ್ ಖರ್ಗೆಯವರು ಮುಖ್ಯಮಂತ್ರಿ ಸ್ಥಾನದ ಮೇಲೆ ಕಣ್ಣಿಟ್ಟಂತೆ ಕಾಣುತ್ತಿದೆ.

ಗಾಂಧಿ ಕುಟುಂಬವನ್ನು ಓಲೈಸುವ ನಿಟ್ಟಿನಲ್ಲಿ ಈ ರೀತಿ ಪತ್ರ ಬರೆದಂತೆ ಕಾಣುತ್ತಿದೆ ಎಂದು ತೀಕ್ಷ್ಣವಾಗಿ ಹೇಳಿದರು. ಆರ್‌ಎಸ್‌ಎಸ್‌ ನೂರು ವರ್ಷ ಪೂರೈಸಿದ ಈ ಶುಭ ಘಳಿಗೆಯಲ್ಲಿ ದೇಶಾದ್ಯಂತ ಅನೇಕ ಚಟುವಟಿಕೆಗಳು, ಪಥ ಸಂಚಲನ ನಡೆಯುತ್ತಿವೆ. ಇಂಥ ಸಂದರ್ಭದಲ್ಲಿ ಪ್ರಿಯಾಂಕ್ ಪತ್ರ ಬರೆದಿದ್ದಾರೆ. ಇದಕ್ಕೆ ಕಾಲವೇ ಉತ್ತರಿಸುತ್ತದೆ. ಕಲ್ಯಾಣ ಕರ್ನಾಟಕದಲ್ಲಿ 30-35 ಸಾವಿರ ಶಿಕ್ಷಕರ ನೇಮಕಾತಿ ಆಗಿಲ್ಲವೆಂದು ನಿಮ್ಮ ತಂದೆ ಮಲ್ಲಿಕಾರ್ಜುನ ಖರ್ಗೆಯವರು ಬಹಿರಂಗವಾಗಿ ಹೇಳಿದ್ದಾರೆ. ಅದರ ಬಗ್ಗೆ ಚಿಂತಿಸಿ ಎಂದು ಸಲಹೆ ನೀಡಿದರು.

ಬೆದರಿಸುವ ತಂತ್ರ

ಕಲಬುರಗಿಯಲ್ಲಿ ಗೂಂಡಾಗಿರಿ, ಮರಳು ಮಾಫಿಯಾ ನಡೆಯುತ್ತಿದೆ. ಗುತ್ತಿಗೆದಾರ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಬೆದರಿಸುವ ತಂತ್ರ ನಡೆಯುತ್ತಿದೆ. ಸಚಿವರಾಗಿ ಈ ವಿಚಾರಗಳ ಕಡೆ ಗಮನ ಹರಿಸಿದರೆ ನಿಮ್ಮ ಜಿಲ್ಲೆಗೂ ಹೆಚ್ಚು ಅನುಕೂಲ. ಸಚಿವರಾಗಿ ಯಾವುದನ್ನು ಗಮನಿಸಬೇಕೋ ಅದನ್ನು ಮಾಡದೆ ಉಡಾಫೆಯಾಗಿ ಮಾತನಾಡುವುದು ಶೋಭೆ ತರುವುದಿಲ್ಲ ಎಂದು ಹೇಳಿದರು.