ಹಿಂದುಳಿದ ವರ್ಗಗಳ ರಾಷ್ಟ್ರೀಯ ಸಲಹಾ ಸಮಿತಿ ಮುಖ್ಯಸ್ಥರನ್ನಾಗಿ ಸಿದ್ದರಾಮಯ್ಯ ಅವರನ್ನು ನಿಯೋಜಿಸಲು ವೇದಿಕೆ ಸಿದ್ಧವಾಗಿದೆ. ಇನ್ನು ಅವರು ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡುವುದಷ್ಟೇ ಬಾಕಿ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಭವಿಷ್ಯ ನುಡಿದರು.
ಮೈಸೂರು (ಜು.07): ಹಿಂದುಳಿದ ವರ್ಗಗಳ ರಾಷ್ಟ್ರೀಯ ಸಲಹಾ ಸಮಿತಿ ಮುಖ್ಯಸ್ಥರನ್ನಾಗಿ ಸಿದ್ದರಾಮಯ್ಯ ಅವರನ್ನು ನಿಯೋಜಿಸಲು ವೇದಿಕೆ ಸಿದ್ಧವಾಗಿದೆ. ಇನ್ನು ಅವರು ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡುವುದಷ್ಟೇ ಬಾಕಿ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಭವಿಷ್ಯ ನುಡಿದರು. ನಗರದ ಬಿಜೆಪಿ ಕಚೇರಿಯಲ್ಲಿ ಭಾನುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಕಾಂಗ್ರೆಸ್ ಹೈಕಮಾಂಡ್ ಶಾಸಕರಿಂದ ಅಭಿಪ್ರಾಯ ಸಂಗ್ರಹಿಸುತ್ತಿದೆ. ಮುಖ್ಯಮಂತ್ರಿ ಸ್ಥಾನ ಬದಲಾವಣೆಗೆ ಎಲ್ಲಾ ರೀತಿಯ ಸಿದ್ಧತೆಯೂ ಆಗಿದೆ. ರಾಷ್ಟ್ರಮಟ್ಟದಲ್ಲಿ ಹಿಂದುಳಿದ ವರ್ಗಗಳ ರಾಷ್ಟ್ರೀಯ ಸಲಹಾ ಸಮಿತಿ ಮುಖ್ಯಸ್ಥರನ್ನಾಗಿ ನಿಯೋಜಿಸಿ ಹೊಸದಿಲ್ಲಿಗೆ ಕಳುಹಿಸಲು ಸಿದ್ಧತೆ ಮಾಡಿಕೊಳ್ಳಲಾಗಿದೆ.
ಈಗ ಸಿದ್ದರಾಮಯ್ಯ ರಾಜೀನಾಮೆ ಕೊಡುವುದು ಮಾತ್ರವೇ ಬಾಕಿ ಎಂದರು. ಸಿದ್ದರಾಮಯ್ಯ ಒಂದೆರಡು ತಿಂಗಳಲ್ಲಿಯೇ ರಾಜೀನಾಮೆ ನೀಡುವುದರಿಂದ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ. ಡಿ.ಕೆ.ಶಿವಕುಮಾರ್ ಅವರಿಗೆ ನೂರು ಶಾಸಕರ ಬೆಂಬಲವಿದೆ ಎಂದು ಶಾಸಕ ಇಕ್ಬಾಲ್ ಹುಸೇನ್ ಹೇಳಿದ್ದಾರೆ. ಸಿದ್ದರಾಮಯ್ಯ ಬಳಿಕ ಯಾರು ಸಿಎಂ ಆಗುತ್ತಾರೆ ಎಂಬುದಕ್ಕಿಂತ ಈ ಸರ್ಕಾರ ಇರಬೇಕಾ?, ಬೇಡವಾ ಎಂಬುದು ಮುಖ್ಯ. ಏಕೆಂದರೆ ಜನ ಈಗಲೇ ಈ ಸರ್ಕಾರಕ್ಕೆ ಹಿಡಿಶಾಪ ಹಾಕುತ್ತಿದ್ದಾರೆ ಎಂದು ಅವರು ಹೇಳಿದರು.
ಹೊಸ ಉತ್ಸಾಹ: ಕೇಂದ್ರದಲ್ಲಿ ಕಾಂಗ್ರೆಸ್ಸೇತರ ಸರ್ಕಾರ ಸತತ 3ನೇ ಬಾರಿಗೆ ಅಧಿಕಾರಕ್ಕೆ ಬಂದು 11 ವರ್ಷ ಪೂರೈಸಿದ್ದು, ಪ್ರಧಾನಿ ನರೇಂದ್ರ ಮೋದಿ ಅವರ ಅಧಿಕಾರಾವಧಿಯಲ್ಲಿ ದೇಶದಲ್ಲಿ ಹೊಸ ಉತ್ಸಾಹ ಮೂಡಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಹೇಳಿದ್ದಾರೆ. ನರೇಂದ್ರ ಮೋದಿ ಅವರು ಪ್ರಧಾನಿ ಆಗುವ ಮುನ್ನ ಅಧಿಕಾರದಲ್ಲಿದ್ದ ಯುಪಿಎ ಸರ್ಕಾರ ಹಗರಣಗಳ ಸರಮಾಲೆಯಲ್ಲಿ ಸಿಲುಕಿಕೊಂಡಿತ್ತು. ₹12 ಲಕ್ಷ ಕೋಟಿಗೂ ಹೆಚ್ಚು ಹಗರಣ ಯುಪಿಎ ಸರ್ಕಾರದ ಅವಧಿಯಲ್ಲಿ ಆಗಿತ್ತು.
ಜನ ಈ ದೇಶದ ಗತಿ ಇಷ್ಟೇ ಎನ್ನುವ ತೀರ್ಮಾನಕ್ಕೆ ಬಂದಿದ್ದರು. ಬಳಿಕ ಜನರಿಗೆ ಅಭಿವೃದ್ಧಿಯ ಭರವಸೆ ಬರಲು ಮೋದಿ ಅವರು ಕಾರಣವಾಗಿದ್ದು, ಅವರ 11 ವರ್ಷದ ಸುದೀರ್ಘ ಆಡಳಿತದಲ್ಲಿ ದೇಶದ ಜನತೆಗೆ ಸಂತೋಷ ಇದೆ. ಎನ್‌ಡಿಎ ಸರ್ಕಾರ ದಿಟ್ಟ ನಿರ್ಧಾರ ಕೈಗೊಳ್ಳುವ ಮೂಲಕ ಭಾರತವನ್ನು ಸದೃಢ ದೇಶವಾಗಿಸಿದೆ. ಆಂತರಿಕ ಭದ್ರತೆ, ಅಂತಾರಾಷ್ಟ್ರೀಯ ಮಟ್ಟದಲ್ಲಿ ಭಾರತದ ಹಿರಿಮೆ ಹೆಚ್ಚಲು ಮೋದಿ ಕಾರಣವಾಗಿದ್ದಾರೆ ಎಂದರು.
ಕೇಂದ್ರದ 11 ವರ್ಷದ ಸಾಧನೆ ಶೂನ್ಯ ಅನ್ನೋ ಸಿಎಂ ಸಿದ್ದರಾಮಯ್ಯ ಅವರ ಹೇಳಿಕೆಗೆ ಪ್ರತಿಕ್ರಿಯಿಸಿ, ನಿನ್ನೆ ಹಣಕಾಸಿನ ಆಯೋಗದ ಸಭೆಗೆ ಸಿದ್ದರಾಮಯ್ಯ ಅವರು ದೆಹಲಿಗೆ ಹೋಗಿದ್ದರು. ರಾಜ್ಯ ಜನತೆ ಪರವಾಗಿ ಸಿದ್ದರಾಮಯ್ಯ ಅವರಿಗೆ ನಾನು ಧನ್ಯವಾದ ಹೇಳುತ್ತೇನೆ. ಮೋದಿ ಅವರಿಗೆ ಸಿದ್ದರಾಮಯ್ಯ ಸರ್ಟಿಫಿಕೇಟ್ ಅವಶ್ಯಕತೆ ಇಲ್ಲ. ಕೇಂದ್ರ ಸರ್ಕಾರ ನಮಗೆ ಹಣ ಕೊಡುತ್ತಿಲ್ಲ ಅನ್ನೋದು ಅಪಪ್ರಚಾರ. ಸುಳ್ಳನ್ನೇ ಸತ್ಯ ರೀತಿಯಲ್ಲಿ ಹೇಳುವುದರಲ್ಲಿ ಸಿದ್ದರಾಮಯ್ಯ ನಿಸ್ಸೀಮರು. ರಾಜ್ಯದ ಅಭಿವೃದ್ಧಿಗಾಗಿಗೆ ಹಣ ಕೊಡಲು ರಾಜ್ಯ ಸರ್ಕಾರದ ಬಳಿ ಹಣ ಇಲ್ಲ ಎಂದು ಟೀಕಿಸಿದರು.
