ಕೊಪ್ಪಳದಲ್ಲಿ ಶಾಂತಿ-ಸುವ್ಯವಸ್ಥೆ ಕದಡಿದರೆ ಅದಕ್ಕೆ ರಾಜ್ಯ ಸರ್ಕಾರವೇ ಹೊಣೆ ಹೊರಬೇಕಾಗುತ್ತದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಎಚ್ಚರಿಕೆ ನೀಡಿದ್ದಾರೆ.
ಬೆಂಗಳೂರು (ಆ.19): ಗವಿಸಿದ್ದಪ್ಪ ನಾಯಕ ಹ*ತ್ಯೆ ಪ್ರಕರಣ ಸಂಬಂಧ ಕೊಪ್ಪಳದಲ್ಲಿ ಶಾಂತಿ-ಸುವ್ಯವಸ್ಥೆ ಕದಡಿದರೆ ಅದಕ್ಕೆ ರಾಜ್ಯ ಸರ್ಕಾರವೇ ಹೊಣೆ ಹೊರಬೇಕಾಗುತ್ತದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಎಚ್ಚರಿಕೆ ನೀಡಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿ, ರಾಜ್ಯ ಸರ್ಕಾರ ಮತ್ತು ಕೆಲ ಮುಖಂಡರು ಎಂಥ ಕೀಳು ಮಟ್ಟಕ್ಕೆ ಇಳಿದಿದ್ದಾರೆಂದರೆ ಗವಿಸಿದ್ದಪ್ಪ ನಾಯಕರ ಕುಟುಂಬಕ್ಕೆ ನ್ಯಾಯ ಕೊಡುವ ಬದಲಾಗಿ ಗವಿಸಿದ್ದಪ್ಪ ನಾಯಕರ ತಂದೆ, ತಾಯಿ, ಅಕ್ಕ, ತಂಗಿ ವಿರುದ್ಧ ಎಫ್ಐಆರ್ ದಾಖಲಿಸಿದ್ದು ದುರ್ದೈವ. ಇಂಥ ನೀಚಮಟ್ಟಕ್ಕೆ ಈ ವ್ಯವಸ್ಥೆ ಮತ್ತು ರಾಜಕಾರಣಿಗಳು ಇಳಿಯುತ್ತಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಇಂಥ ಬರ್ಬರ ಹ*ತ್ಯೆ. ಆದರೂ ಕೊಪ್ಪಳ ಜಿಲ್ಲೆಯ ಜನ ಇಂದು ಶಾಂತಿಯುತವಾಗಿ ಇದ್ದಾರೆ. ಬಡ ಕುಟುಂಬದ ವಿರುದ್ಧ ಎಫ್ಐಆರ್ ದಾಖಲಿಸುವ ಷಡ್ಯಂತ್ರ ವಿರುದ್ಧ ಜನ ಬೀದಿಗಿಳಿದು ಹೋರಾಡುವ ಪರಿಸ್ಥಿತಿಯನ್ನು ರಾಜ್ಯ ಸರ್ಕಾರವೇ ತಂದಿಡುತ್ತಿದೆ ಎಂದು ಹೇಳಿದರು. ರಾಜ್ಯ ಸರ್ಕಾರದಿಂದ ನ್ಯಾಯಕ್ಕಾಗಿ ಈ ಬಡ ಕುಟುಂಬ, ತಂದೆ, ತಾಯಿ ಕಳೆದ ವಾರ ಗೌರವಾನ್ವಿತ ರಾಜ್ಯಪಾಲರನ್ನು ಭೇಟಿ ಮಾಡಿತ್ತು. ಕುಟುಂಬಕ್ಕೆ ಸರ್ಕಾರಿ ನೌಕರಿ ಕೊಡಬೇಕು, 50 ಲಕ್ಷ ರು. ಪರಿಹಾರ ನೀಡಬೇಕು ಎನ್ನುವ ಅಪೇಕ್ಷೆಯನ್ನು ಅವರು ವ್ಯಕ್ತಪಡಿಸಿದ್ದರು. ನಾವು ಕೂಡ ಸರ್ಕಾರಕ್ಕೆ ಆಗ್ರಹಿಸಿದ್ದೆವು. ಆದರೆ, ಇದೀಗ ಪರಿಶಿಷ್ಟ ಪಂಗಡಕ್ಕೆ ಸೇರಿದ ಆ ಬಡ ಕುಟುಂಬದ ವಿರುದ್ಧ ಎಫ್ಐಆರ್ ದಾಖಲಿಸಿದೆ. ಇಂಥ ದುರ್ಬುದ್ಧಿ ಇವರಿಗೆ ಬರುತ್ತದೆ ಎಂದು ನಾವ್ಯಾರೂ ನಿರೀಕ್ಷೆ ಮಾಡಿರಲಿಲ್ಲ ಎಂದು ಹರಿಹಾಯ್ದರು.
ಧರ್ಮಸ್ಥಳ ವಿರುದ್ಧ ಅಪಪ್ರಚಾರಕ್ಕೆ ಸರ್ಕಾರ ಕಡಿವಾಣ: ಎಂಟು ಶತಮಾನಗಳ ಭವ್ಯ ಇತಿಹಾಸ ಮತ್ತು ಪರಂಪರೆ ಹೊಂದಿರುವ ನಾಡಿನ ಪವಿತ್ರ ಕ್ಷೇತ್ರ ಹಾಗೂ ಸರ್ವಧರ್ಮ ಸಮನ್ವಯ ಕೇಂದ್ರವಾದ ಧರ್ಮಸ್ಥಳದ ಬಗ್ಗೆ ಕಳೆದ ಕೆಲವು ದಿನಗಳಿಂದ ಎಸ್‌ಐಟಿ ತನಿಖೆಯ ನೆಪದಲ್ಲಿ ನಡೆಯುತ್ತಿರುವ ಅಪಪ್ರಚಾರಕ್ಕೆ ಸರ್ಕಾರ ತಕ್ಷಣ ಕಡಿವಾಣ ಹಾಕಬೇಕು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಒತ್ತಾಯಿಸಿದ್ದಾರೆ.ಭಾನುವಾರ ಧರ್ಮಸ್ಥಳಕ್ಕೆ ಭೇಟಿ ನೀಡಿ, ದೇವರ ದರ್ಶನ ಪಡೆದು, ವಿಶೇಷ ಸೇವೆ ಸಲ್ಲಿಸಿದ ಬಳಿಕ ಸುದ್ದಿಗಾರರೊಂದಿಗೆ ಅವರು ಮಾತನಾಡಿದರು.
ಧರ್ಮಸ್ಥಳ, ಅಣ್ಣಪ್ಪ ಸ್ವಾಮಿ ಹಾಗೂ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆ ತೇಜೋವಧೆ ಬಗ್ಗೆ ಆಧಾರ ರಹಿತ ಸುಳ್ಳು ವದಂತಿಗಳ ಅಪಪ್ರಚಾರದಿಂದ ಅಸಂಖ್ಯಾತ ಭಕ್ತರು ಹಾಗೂ ಅಭಿಮಾನಿಗಳಲ್ಲಿ ಗೊಂದಲದ ವಾತಾವರಣ ಮೂಡಿದೆ ಎಂದರು.ಎಸ್‌ಐಟಿ ತನಿಖೆಯನ್ನು ಬಿಜೆಪಿ ಸ್ವಾಗತಿಸುತ್ತದೆ ಎಂದ ಅವರು, ತನಿಖೆ ಪಾರದರ್ಶಕವಾಗಿ ನಡೆಯಬೇಕು ಎಂದು ಸಲಹೆ ನೀಡಿದರು.ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ಷಡ್ಯಂತ್ರ ಇದೆ ಎಂದು ಹೇಳಿದ್ದಾರೆ. ಆದರೆ ಈ ಬಗ್ಗೆ ಯಾವುದೇ ಮಾಹಿತಿ ಅವರು ಬಹಿರಂಗಪಡಿಸಿಲ್ಲ. ಈ ಷಡ್ಯಂತ್ರದ ಹಿಂದೆ ಯಾರಿದ್ದಾರೆ ಎಂಬ ಬಗ್ಗೆಯೂ ತನಿಖೆಯಾಗಬೇಕು. ಜತೆಗೆ ದೂರುದಾರನ ಹಿನ್ನೆಲೆ ಹಾಗೂ ಧರ್ಮಸ್ಥಳದ ವಿರುದ್ಧ ಅಪಪ್ರಚಾರ ಮಾಡುವವರ ಬಗ್ಗೆಯೂ ತನಿಖೆಯಾಗಲಿ ಎಂದು ಆಶಿಸಿದರು.
