ಬಾಗಲಕೋಟೆ ಹಾಗೂ ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರಗಳಿಗೆ ಏಪ್ರಿಲ್‌ 9ರಂದು ನಡೆಯಲಿರುವ ಉಪ ಚುನಾವಣೆಗೆ ಕಣ ಸಿದ್ದವಾಗಿದ್ದು, ನಾಮಪತ್ರ ಸಲ್ಲಿಕೆಗೆ ಕೊನೆಯ ದಿನವಾದ ಸೋಮವಾರ ಬಿಜೆಪಿ ಹಾಗೂ ಕಾಂಗ್ರೆಸ್‌ ಅಭ್ಯರ್ಥಿಗಳು ಅಧಿಕೃತವಾಗಿ ತಮ್ಮ ನಾಮಪತ್ರ ಸಲ್ಲಿಸಲಿದ್ದಾರೆ.

ದಾವಣಗೆರೆ/ಬಾಗಲಕೋಟೆ : ಬಾಗಲಕೋಟೆ ಹಾಗೂ ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರಗಳಿಗೆ ಏಪ್ರಿಲ್‌ 9ರಂದು ನಡೆಯಲಿರುವ ಉಪ ಚುನಾವಣೆಗೆ ಕಣ ಸಿದ್ದವಾಗಿದ್ದು, ನಾಮಪತ್ರ ಸಲ್ಲಿಕೆಗೆ ಕೊನೆಯ ದಿನವಾದ ಸೋಮವಾರ ಬಿಜೆಪಿ ಹಾಗೂ ಕಾಂಗ್ರೆಸ್‌ ಅಭ್ಯರ್ಥಿಗಳು ಅಧಿಕೃತವಾಗಿ ತಮ್ಮ ನಾಮಪತ್ರ ಸಲ್ಲಿಸಲಿದ್ದಾರೆ.

ದಾವಣಗೆರೆ ದಕ್ಷಿಣ ಕ್ಷೇತ್ರಕ್ಕೆ ಬಿಜೆಪಿಯಿಂದ ಎಸ್‌ಟಿ ಮೋರ್ಚಾದ ರಾಜ್ಯ ಉಪಾಧ್ಯಕ್ಷ ಶ್ರೀನಿವಾಸ ಟಿ.ದಾಸಕರಿಯಪ್ಪ ಹಾಗೂ ಕಾಂಗ್ರೆಸ್‌ನಿಂದ ಶಾಮನೂರು ಕುಟುಂಬದ ಮೂರನೇ ತಲೆಮಾರಿನ ಸಮರ್ಥ ಎಂ.ಶಾಮನೂರು ನಾಮಪತ್ರ ಸಲ್ಲಿಸಲಿದ್ದಾರೆ. ಬಾಗಲಕೋಟೆಯಲ್ಲಿ ಬಿಜೆಪಿಯಿಂದ ವೀರಭದ್ರಯ್ಯ ಚರಂತಿಮಠ ಹಾಗೂ ಕಾಂಗ್ರೆಸ್‌ನಿಂದ ಎಚ್.ವೈ.ಮೇಟಿ ಅವರ ಕಿರಿಯ ಪುತ್ರ ಉಮೇಶ್ ಮೇಟಿ ನಾಮಪತ್ರ ಸಲ್ಲಿಸಲಿದ್ದಾರೆ.

ನಾಮಪತ್ರ ಸಲ್ಲಿಕೆಗೂ ಮುನ್ನ ಅಭ್ಯರ್ಥಿಗಳು ಬೃಹತ್‌ ಮೆರವಣಿಗೆ ನಡೆಸಿ, ಶಕ್ತಿ ಪ್ರದರ್ಶನಕ್ಕೆ ಮುಂದಾಗಿದ್ದಾರೆ. ಕಾಂಗ್ರೆಸ್‌ ಅಭ್ಯರ್ಥಿಗಳ ನಾಮಪತ್ರ ಸಲ್ಲಿಕೆ ವೇಳೆ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹಾಗೂ ಬಿಜೆಪಿ ಅಭ್ಯರ್ಥಿಗಳ ನಾಮಪತ್ರ ಸಲ್ಲಿಕೆ ವೇಳೆ ಮಾಜಿ ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ, ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ, ಕೇಂದ್ರ ಸಚಿವ ಪ್ರಹ್ಲಾದ್‌ ಜೋಶಿ ಹಾಜರಿದ್ದು, ಶಕ್ತಿ ತುಂಬಲಿದ್ದಾರೆ.

ಕುಟುಂಬಕ್ಕೆ ಮಣೆ:

ಎರಡೂ ಕ್ಷೇತ್ರಗಳಿಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಈಗಾಗಲೇ ಘೋಷಿಸಿದ್ದರೂ, ಕಾಂಗ್ರೆಸ್‌ಗೆ ಎರಡೂ ಕ್ಷೇತ್ರಗಳು ಕಗ್ಗಂಟಾಗಿದ್ದವು. ದಾವಣಗೆರೆ ದಕ್ಷಿಣದಲ್ಲಿ ಮುಸ್ಲಿಂ ಸಮುದಾಯ ಟಿಕೆಟ್‌ ಗೆ ಪಟ್ಟು ಹಿಡಿದಿದ್ದರೆ, ಬಾಗಲಕೋಟೆಯಲ್ಲಿ ಎಚ್‌.ವೈ.ಮೇಟಿ ಕುಟುಂಬ ಸದಸ್ಯರ ನಡುವೆ ಟಿಕೆಟ್‌ಗೆ ಫೈಟ್‌ ನಡೆದಿತ್ತು.

ಅಂತಿಮವಾಗಿ ದಾವಣಗೆರೆ ದಕ್ಷಿಣದಿಂದ ಸಮರ್ಥಗೆ, ಬಾಗಲಕೋಟೆಯಿಂದ ಉಮೇಶ್ ಮೇಟಿಗೆ ಕಾಂಗ್ರೆಸ್‌ ಟಿಕೆಟ್ ಘೋಷಣೆ ಮಾಡಿದ್ದು, ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್‌ ಅವರು ಭಾನುವಾರವೇ ಬಿ-ಫಾರಂ ವಿತರಿಸಿದರು. ಸಮರ್ಥ ಪರ ಎಸ್‌.ಎಸ್. ಮಲ್ಲಿಕಾರ್ಜುನ, ಉಮೇಶ್ ಮೇಟಿ ಪರ ಮಂಜುನಾಥ್‌ ಬಿ-ಫಾರಂ ಪಡೆದರು.

ಆ ಮೂಲಕ ಬಾಗಲಕೋಟೆಯಲ್ಲಿ ಬಿಜೆಪಿ ಅಭ್ಯರ್ಥಿ ವೀರಣ್ಣ ಚರಂತಿಮಠ ಮತ್ತು ಕಾಂಗ್ರೆಸ್​ ಅಭ್ಯರ್ಥಿ ಉಮೇಶ್ ಮೇಟಿ ನಡುವೆ ಸ್ಪರ್ಧೆ ಏರ್ಪಟ್ಟಿದ್ದರೆ, ದಾವಣಗೆರೆ ದಕ್ಷಿಣದಲ್ಲಿ ಬಿಜೆಪಿಯ ಶ್ರೀನಿವಾಸ್ ಟಿ. ದಾಸಕರಿಯಪ್ಪ ವಿರುದ್ಧ ಸಚಿವ ಎಸ್​​.ಎಸ್​​. ಮಲ್ಲಿಕಾರ್ಜುನ್​​ ಅವರ ಪುತ್ರ ಸಮರ್ಥ​​ ಅಖಾಡಕ್ಕಿಳಿದಿದ್ದಾರೆ.

ಬೃಹತ್ ಮೆರವಣಿಗೆ ಮೂಲಕ ಶಕ್ತಿ ಪ್ರದರ್ಶನ;

ದಾವಣಗೆರೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಸಮರ್ಥ ಎಂ.ಶಾಮನೂರು ಅವರು ಸೋಮವಾರ ಬೆಳಗ್ಗೆ 10 ಗಂಟೆಗೆ ನಗರ ದೇವತೆ ದುರ್ಗಾಂಬಿಕಾ ದೇವಿ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಲಿದ್ದಾರೆ. ನಂತರ, ಶಿವಾಜಿ ಮಹಾರಾಜರ ಪುತ್ಥಳಿಗೆ ಮಾಲಾರ್ಪಣೆ ಮಾಡಿ, ಅಲ್ಲಿಂದ ಹಜರತ್ ಷಾವಲಿ ದರ್ಗಾಗೆ ತೆರಳಿ, ಪ್ರಾರ್ಥನೆ ಸಲ್ಲಿಸಲಿದ್ದಾರೆ. ಬಳಿಕ, ಬೃಹತ್‌ ಮೆರವಣಿಗೆ ಮೂಲಕ ಮಹಾನಗರ ಪಾಲಿಕೆಯಲ್ಲಿನ ದಕ್ಷಿಣ ಕ್ಷೇತ್ರ ಚುನಾವಣಾಧಿಕಾರಿ ಕಚೇರಿಗೆ ತೆರಳಿ, ಅಧಿಕೃತವಾಗಿ ಮತ್ತೊಮ್ಮೆ ನಾಮಪತ್ರ ಸಲ್ಲಿಸಲಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ, ಸಚಿವ ಎಸ್‌.ಎಸ್‌. ಮಲ್ಲಿಕಾರ್ಜುನ, ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ ಇತರರು ಸೇರಿ ಸುಮಾರು 25 ಸಾವಿರಕ್ಕೂ ಅಧಿಕ ಕಾರ್ಯಕರ್ತರು ಮೆರವಣಿಗೆಯಲ್ಲಿ ಪಾಲ್ಗೊಳ್ಳಲಿದ್ದಾರೆ.

ಇದೇ ವೇಳೆ, ಬಿಜೆಪಿ ಅಭ್ಯರ್ಥಿ ಶ್ರೀನಿವಾಸ ಟಿ.ದಾಸಕರಿಯಪ್ಪ ಅವರು ಬೆಳಗ್ಗೆ ನಗರ ದೇವತೆ ದುರ್ಗಾಂಬಿಕಾ ದೇವಿ ದೇವಸ್ಥಾನದಲ್ಲಿ ವಿಶೇಷ ಪೂಜೆ ನೆರವೇರಿಸಿ, ಬೃಹತ್ ಮೆರವಣಿಗೆ ಮೂಲಕ ತೆರಳಿ, ನಾಮಪತ್ರ ಸಲ್ಲಿಸಲಿದ್ದಾರೆ. ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ, ಜಗದೀಶ ಶೆಟ್ಟರ್, ಜಿ.ಎಂ. ಸಿದ್ದೇಶ್ವರ, ಬಿ.ಶ್ರೀರಾಮುಲು ಸೇರಿ 20 ಸಾವಿರಕ್ಕೂ ಅಧಿಕ ಕಾರ್ಯಕರ್ತರು ಮೆರವಣಿಗೆಯಲ್ಲಿ ಪಾಲ್ಗೊಳ್ಳಲಿದ್ದಾರೆ.

ಬಾಗಲಕೋಟೆಯಲ್ಲಿ ಬಿಜೆಪಿ ಅಭ್ಯರ್ಥಿ ಡಾ.ವೀರಣ್ಣ ಚರಂತಿಮಠ ಅವರು ಬೃಹತ್‌ ಶೋಭಾಯಾತ್ರೆ ಮೂಲಕ ನಾಮಪತ್ರ ಸಲ್ಲಿಕೆ ಮಾಡಲಿದ್ದು, ಈ ವೇಳೆ, ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ, ಕೇಂದ್ರ ಸಚಿವ ಪ್ರಹ್ಲಾದ್‌ ಜೋಶಿ, ಮಾಜಿ ಸಿಎಂ ಜಗದೀಶ ಶೆಟ್ಟರ, ಬಿ.ಶ್ರೀರಾಮುಲು ಹಾಗೂ ಇತರರು ಪಾಲ್ಗೊಳ್ಳಲಿದ್ದಾರೆ. ಲಿಂಗಾಯತ ಸಮುದಾಯದ ಪ್ರಭಾವಿ ನಾಯಕರಾಗಿರುವ ವೀರಭದ್ರಯ್ಯ ಚರಂತಿಮಠ, ತಮ್ಮ ನಾಮಪತ್ರ ಸಲ್ಲಿಕೆ ವೇಳೆ, ಬೃಹತ್‌ ಶಕ್ತಿ ಪ್ರದರ್ಶನಕ್ಕೆ ಸಿದ್ಧತೆ ಮಾಡಿಕೊಂಡಿದ್ದಾರೆ.

ಈ ಮಧ್ಯೆ, ಕಾಂಗ್ರೆಸ್ ಅಭ್ಯರ್ಥಿಯಾಗಿ ಎಚ್.ವೈ.ಮೇಟಿ ಅವರ ಕಿರಿಯ ಪುತ್ರ ಉಮೇಶ ಮೇಟಿ ಭವ್ಯ ಮೆರವಣಿಗೆಯೊಂದಿಗೆ ನಾಮಪತ್ರ ಸಲ್ಲಿಸಲಿದ್ದು, ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ.ಶಿವಕುಮಾರ್‌, ಜಿಲ್ಲಾ ಉಸ್ತುವಾರಿ ಸಚಿವ ಆರ್‌.ಬಿ.ತಿಮ್ಮಾಪುರ, ಸಚಿವ ಸತೀಶ ಜಾರಕಿಹೊಳಿ, ಎಂ.ಬಿ. ಪಾಟೀಲ, ಶಿವಾನಂದ ಪಾಟೀಲ, ಶಿವರಾಜ ತಂಗಡಗಿ, ರಹಿಂಖಾನ ಹಾಗೂ ಇತರರು ಪಾಲ್ಗೊಳ್ಳಲಿದ್ದಾರೆ.ಪ್ರತಿಭಟನೆ ಬಿಸಿ:

ಈ ಮಧ್ಯೆ, ದಕ್ಷಿಣ ಕ್ಷೇತ್ರದ ಉಪ ಚುನಾವಣೆಗೆ ಮುಸ್ಲಿಂ ಸಮುದಾಯಕ್ಕೆ ಟಿಕೆಟ್ ತಪ್ಪಿದ್ದರಿಂದ ಆಕ್ರೋಶಗೊಂಡ ಮುಸ್ಲಿಮರು, ಭಾನುವಾರ ಕೈಯಲ್ಲಿ ಕಪ್ಪು ಬಾವುಟ ಹಿಡಿದು, ‘ಜಸ್ಟೀಸ್ ಫಾರ್ ಮೈನಾರಿಟೀಸ್, ಜಸ್ಟೀಸ್ ಫಾರ್ ಅಹಿಂದ’ ಎಂದು ಘೋಷಣೆ ಕೂಗಿ ಪ್ರತಿಭಟನೆ ನಡೆಸಿದರು.

2 ಕ್ಷೇತ್ರಗಳಲ್ಲೂ ಶಕ್ತಿ ಪ್ರದರ್ಶನ ಸಿದ್ದು, ಡಿಕೆ, ಬಿಎಸ್‌ವೈ, ವಿಜಯೇಂದ್ರ ಭಾಗಿ

ನಾಮಪತ್ರ ಸಲ್ಲಿಕೆಗೂ ಮುನ್ನ ಅಭ್ಯರ್ಥಿಗಳು ಎರಡು ಕ್ಷೇತ್ರಗಳಲ್ಲಿ ಅಭ್ಯರ್ಥಿಗಳು ಬೃಹತ್‌ ಮೆರವಣಿಗೆ ನಡೆಸಿ, ಶಕ್ತಿ ಪ್ರದರ್ಶನಕ್ಕೆ ಮುಂದಾಗಿದ್ದಾರೆ. ಕಾಂಗ್ರೆಸ್‌ ಅಭ್ಯರ್ಥಿಗಳ ನಾಮಪತ್ರ ಸಲ್ಲಿಕೆ ವೇಳೆ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹಾಗೂ ಬಿಜೆಪಿ ಅಭ್ಯರ್ಥಿಗಳ ನಾಮಪತ್ರ ಸಲ್ಲಿಕೆ ವೇಳೆ ಮಾಜಿ ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ, ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ, ಕೇಂದ್ರ ಸಚಿವ ಪ್ರಹ್ಲಾದ್‌ ಜೋಶಿ ಹಾಜರಿದ್ದು, ಶಕ್ತಿ ತುಂಬಲಿದ್ದಾರೆ.

ದಾವಣಗೆರೆಯಲ್ಲಿ ಕೈಗೆ ಬಂಡಾಯ ಸ್ಪರ್ಧೆ ಭೀತಿ

ದಾವಣಗೆರೆ: ಟಿಕೆಟ್‌ ನಿರಾಕರಣೆಯಿಂದ ಆಕ್ರೋಶಗೊಂಡಿರುವ ಕಾಂಗ್ರೆಸ್ ಹಾಗೂ ಮುಸ್ಲಿಂ ಸಮಾಜದ ಹಿರಿಯ ಮುಖಂಡ, ಸಾದಿಕ್ ಪೈಲ್ವಾನ್ ಅವರು ದಾವಣಗೆರೆ ದಕ್ಷಿಣ ಕ್ಷೇತ್ರದಲ್ಲಿ ಪಕ್ಷೇತರ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಕೆಗೆ ಮುಂದಾಗಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿ, ಮುಸ್ಲಿಮರಿಗೆ ಟಿಕೆಟ್ ಸಿಕ್ಕಿಲ್ಲ. ಹಾಗಾಗಿ, ನಾನು ಪಕ್ಷೇತರನಾಗಿ ಸ್ಪರ್ಧಿಸುವೆ. ದಕ್ಷಿಣ ಕ್ಷೇತ್ರದಲ್ಲಿ ನನಗೆ ಕಾಂಗ್ರೆಸ್ ಪಕ್ಷವೇ ಎದುರಾಳಿ. ಸೋಮವಾರ ಬೆಳಗ್ಗೆ 11.30ಕ್ಕೆ ಇಲ್ಲಿನ ಅರಳೀ ಮರ ವೃತ್ತದಿಂದ ಪಾದಯಾತ್ರೆ ಮೂಲಕ ತೆರಳಿ, ಚುನಾವಣಾಧಿಕಾರಿಗೆ ಇನ್ನೊಂದು ಸಲ ನನ್ನ ನಾಮಪತ್ರ ಸಲ್ಲಿಸುತ್ತೇನೆ ಎಂದು ತಿಳಿಸಿದ್ದಾರೆ.