Asianet Suvarna News Asianet Suvarna News

ಶೀಘ್ರ ಸಂಪುಟ ವಿಸ್ತರಣೆ, ನಿರ್ದಿಷ್ಟ ದಿನ ಹೇಳಲಾಗದು: ಸಿಎಂ ಬೊಮ್ಮಾಯಿ

ಆದಷ್ಟು ಶೀಘ್ರವೇ ರಾಜ್ಯ ಸಚಿವ ಸಂಪುಟವನ್ನು ವಿಸ್ತರಿಸಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ. ನಗರದಲ್ಲಿ ಶನಿವಾರ ಸುದ್ದಿಗಾರರೊಂದಿಗೆ ಅವರು ಮಾತನಾಡಿದರು.

cabinet expansion is expected soon says cm basavaraj bommai gvd
Author
First Published Jan 8, 2023, 7:53 AM IST

ಚಿತ್ರದುರ್ಗ (ಜ.08): ಆದಷ್ಟು ಶೀಘ್ರವೇ ರಾಜ್ಯ ಸಚಿವ ಸಂಪುಟವನ್ನು ವಿಸ್ತರಿಸಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ. ನಗರದಲ್ಲಿ ಶನಿವಾರ ಸುದ್ದಿಗಾರರೊಂದಿಗೆ ಅವರು ಮಾತನಾಡಿದರು. ರಮೇಶ್‌ ಜಾರಕಿಹೊಳಿ ಹಾಗೂ ಈಶ್ವರಪ್ಪ ಅವರನ್ನು ಸಂಪುಟಕ್ಕೆ ಸೇರಿಸಿಕೊಳ್ಳುವಿರಾ ಎಂಬ ಪ್ರಶ್ನೆಗೆ ಪ್ರತಿಕ್ರಿಯಿಸಿ, ಸಂಪುಟ ವಿಸ್ತರಣೆ ಸಂಬಂಧ ಹೈಕಮಾಂಡ್‌ ಜೊತೆ ಈಗಾಗಲೇ ಚರ್ಚೆ ನಡೆಸಿದ್ದೇನೆ. ಸಂಪುಟ ವಿಸ್ತರಣೆ ವೇಳೆ ಜಿಲ್ಲೆ ಹಾಗೂ ಪ್ರಾದೇಶಿಕವಾರು ಪ್ರಾತಿನಿಧ್ಯ ನೀಡುವ ಕುರಿತಾಗಿಯೂ ಚರ್ಚಿಸಲಾಗಿದೆ. ಸಂಪುಟಕ್ಕೆ ಯಾರನ್ನು ಸೇರಿಸಿಕೊಳ್ಳಬೇಕು ಎಂಬ ಬಗ್ಗೆ ಬಿಜೆಪಿಯ ಉನ್ನತ ನಾಯಕರು ನಿರ್ಧಾರ ಕೈಗೊಳ್ಳುತ್ತಾರೆ. ಇಂತಹ ದಿನವೇ ವಿಸ್ತರಣೆಯಾಗಲಿದೆ ಎಂದು ಹೇಳಲು ಸಾಧ್ಯವಿಲ್ಲ. ಆದರೆ, ಆದಷ್ಟು ಶೀಘ್ರವೇ ಸಂಪುಟ ವಿಸ್ತರಣೆ ನಡೆಯಲಿದೆ ಎಂದರು.

2-3 ದಿನದಲ್ಲಿ ಸಚಿವ ಸಂಪುಟ ವಿಸ್ತರಣೆ: ಇನ್ನು ಎರಡ್ಮೂರು ದಿನಗಳಲ್ಲಿ ಸಚಿವ ಸಂಪುಟ ವಿಸ್ತರಣೆಯಾಗಲಿದ್ದು, ಕೇಂದ್ರ ನಾಯಕರು ಈ ಸಂಬಂಧ ತೀರ್ಮಾನ ಕೈಗೊಳ್ಳಲಿದ್ದಾರೆ ಎಂದು ನಿಕಟಪೂರ್ವ ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಹೇಳಿದರು. ಶಿಕಾರಿಪುರದಲ್ಲಿ ಪತ್ರಕರ್ತರೊಂದಿಗೆ ಶನಿವಾರ ಮಾತನಾಡಿ, ಯಾರನ್ನು ಸಚಿವ ಸಂಪುಟಕ್ಕೆ ಸೇರಿಸಿಕೊಳ್ಳಬೇಕು ಎಂಬುದು ಪ್ರಧಾನಿಗಳಿಗೆ ಮತ್ತು ಕೇಂದ್ರ ನಾಯಕರಿಗೆ ಬಿಟ್ಟಿದ್ದು ಎಂದರು. ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಕನಿಷ್ಠ 140 ರಿಂದ 150 ಸ್ಥಾನದಲ್ಲಿ ಗೆಲುವು ಸಾಧಿಸುತ್ತೇವೆ. ಈ ಗೆಲುವನ್ನು ತಡೆಯಲು ಯಾರಿಂದಲೂ ಸಾಧ್ಯವಿಲ್ಲ. 

ಸೋನಿಯಾ ಮನೆ ಬಳಿ ಕಾದು ನಿಲ್ಲುತ್ತಿದ್ದ ಸಿದ್ದರಾಮಯ್ಯ: ಸಿಎಂ ಬೊಮ್ಮಾಯಿ

ಸೂರ್ಯ ಚಂದ್ರರಿರುವುದು ಎಷ್ಟು ಸತ್ಯವೋ, ನಮ್ಮ ಗೆಲುವು ಅಷ್ಟೇ ಸತ್ಯ ಎಂದು ವಿಶ್ವಾಸ ವ್ಯಕ್ತಪಡಿಸಿದ ಅವರು, ಕಾಂಗ್ರೆಸ್‌ ಮಾತ್ರ ತಿರುಕನ ಕನಸು ಕಾಣುತ್ತಿದೆ. ಆ ಪಕ್ಷದ ಹಲವು ನಾಯಕರು ತಾವೇ ಮುಖ್ಯಮಂತ್ರಿ ಎಂದು ಕನಸು ಕಾಣುತ್ತಿದ್ದಾರೆ. ಪ್ರತಿಪಕ್ಷ ನಾಯಕ ಸಿದ್ದರಾಮಯ್ಯನವರು ನಿಂತಿರುವ ನೆಲವೇ ಕುಸಿಯುತ್ತಿದೆ. ಆದರೆ ಈ ಬಗ್ಗೆ ಅರಿವಿಲ್ಲದೆ ಹಗುರ ಮಾತುಗಳಲ್ಲಿ ಮುಖ್ಯಮಂತ್ರಿಗಳನ್ನು, ಆರ್‌ಎಸ್‌ಎಸ್‌ ಅನ್ನು ಟೀಕಿಸುತ್ತಿದ್ದಾರೆ. ಇದು ಅವರಿಗೆ ಹವ್ಯಾಸವಾದಂತಿದೆ. ಆದರೆ ಈ ಮಾತುಗಳಿಗೆ ಮತದಾರರು ತಕ್ಕ ಪಾಠ ಕಲಿಸಲಿದ್ದಾರೆ ಎಂದು ಕಿಡಿಕಾರಿದರು.

ಸಂಕ್ರಾಂತಿ ನಂತರ ಸಂಪುಟ ವಿಸ್ತರಣೆ ಆಗುತ್ತಾ?: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಬಹುನಿರೀಕ್ಷಿತ ಸಚಿವ ಸಂಪುಟ ವಿಸ್ತರಣೆ ಇನ್ನೂ ಅನಿಶ್ಚಿತತೆಯಲ್ಲೇ ಮುಂದುವರೆದಿದೆ. ರಾಷ್ಟ್ರೀಯ ಬಿಜೆಪಿಯ ಪ್ರಭಾವಿ ನಾಯಕ ಹಾಗೂ ಕೇಂದ್ರ ಗೃಹ ಸಚಿವ ಅಮಿತ್‌ ಶಾ ಅವರು 2 ದಿನಗಳ ಕಾಲ ರಾಜ್ಯಕ್ಕೆ ಭೇಟಿ ನೀಡಿದಾಗಲೂ ಸಂಪುಟ ವಿಸ್ತರಣೆ ಬಗ್ಗೆ ಹೆಚ್ಚಿನ ಚರ್ಚೆಗೆ ಅವಕಾಶ ನೀಡದೆ ‘ದೇಖೇಂಗೆ...’ (ನೋಡೋಣ) ಎಂದಷ್ಟೇ ಹೇಳಿದ್ದಾರೆ. ಹೀಗಾಗಿ, ಸಂಪುಟ ವಿಸ್ತರಣೆ ಕುರಿತಂತೆ ದೆಹಲಿಯಲ್ಲಿ ಮತ್ತೊಂದು ಸುತ್ತಿನ ಮಾತುಕತೆ ನಡೆಯುವ ಸಾಧ್ಯತೆಯಿದೆ ಎಂದು ಮೂಲಗಳು ತಿಳಿಸಿವೆ. 

ಸದ್ಯ ಶೂನ್ಯಮಾಸ ನಡೆಯುತ್ತಿದೆ. ಸಾಮಾನ್ಯವಾಗಿ ಈ ಶೂನ್ಯಮಾಸದಲ್ಲಿ ರಾಜಕೀಯ ಶುಭ ಕಾರ್ಯಗಳು ಕಡಮೆ. ಒಂದು ವೇಳೆ ವರಿಷ್ಠರು ಸಂಪುಟ ವಿಸ್ತರಣೆಗೆ ಒಪ್ಪಿಗೆ ನೀಡಿದರೂ ಸಂಕ್ರಾಂತಿ ಬಳಿಕ ನಡೆಯಬಹುದು ಎಂಬ ಮಾತು ಕೇಳಿಬರುತ್ತಿದೆ. ಮತ್ತೆ ಸಚಿವ ಸ್ಥಾನದ ಪ್ರಬಲ ಆಕಾಂಕ್ಷಿಗಳಾಗಿರುವ ಮಾಜಿ ಸಚಿವರಾದ ಕೆ.ಎಸ್‌.ಈಶ್ವರಪ್ಪ ಹಾಗೂ ರಮೇಶ್‌ ಜಾರಕಿಹೊಳಿ ಅವರು ಇದೇ ತಿಂಗಳ 19ರಿಂದ ಬೆಳಗಾವಿಯಲ್ಲಿ ಆರಂಭಗೊಂಡ ಅಧಿವೇಶನಕ್ಕೆ ಗೈರು ಹಾಜರಾಗುವ ಮೂಲಕ ತಮ್ಮ ಅಸಮಾಧಾನ ಹೊರಹಾಕಿದ್ದರು. ಈಶ್ವರಪ್ಪ ಅವರು ಬಹಿರಂಗವಾಗಿಯೇ ಅತೃಪ್ತಿ ವ್ಯಕ್ತಪಡಿಸಿದ್ದರು. 

ಕನ್ನಡ ಸಾಹಿತ್ಯ ಸಮ್ಮೇಳನವು ಸಾಹಿತ್ಯ ಲೋಕಕ್ಕೆ ಉತ್ಕೃಷ್ಟ ಮುನ್ನುಡಿ ಬರೆಯಲಿದೆ: ಸಿಎಂ ಬೊಮ್ಮಾಯಿ

ಇದರ ಬೆನ್ನಲ್ಲೇ ಮುಖ್ಯಮಂತ್ರಿ ಬೊಮ್ಮಾಯಿ ಅವರು ಉಭಯ ನಾಯಕರನ್ನು ಕರೆಸಿಕೊಂಡು ಮಾತನಾಡಿ, ‘ವರಿಷ್ಠರ ಜತೆ ಮಾತುಕತೆ ನಡೆಸುವೆ’ ಎಂಬ ಭರವಸೆ ನೀಡಿ ಸಮಾಧಾನಗೊಳಿಸಿದ್ದರು. ಅದರ ಬೆನ್ನಲ್ಲೇ ಕಳೆದ ವಾರ ಬೊಮ್ಮಾಯಿ ಅವರು ದೆಹಲಿಗೆ ತೆರಳಿ ಅಮಿತ್‌ ಶಾ ಮತ್ತು ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಅವರನ್ನು ಭೇಟಿ ಮಾಡಿ ಬಂದಿದ್ದರು. ಆಗಲೂ ಸಂಪುಟ ವಿಸ್ತರಣೆ ಬಗ್ಗೆ ಹೆಚ್ಚು ಆಸಕ್ತಿ ತೋರದ ಅಮಿತ್‌ ಶಾ ಅವರು, ‘ಹೇಗಿದ್ದರೂ ನಾನು ನಾಲ್ಕೈದು ದಿನಗಳಲ್ಲಿ ರಾಜ್ಯಕ್ಕೆ ಭೇಟಿ ನೀಡುತ್ತಿದ್ದೇನೆ. ಅಲ್ಲೇ ಮಾತನಾಡೋಣ’ ಎಂದಿದ್ದರು. ಇದನ್ನೇ ಬೊಮ್ಮಾಯಿ ಅವರು ಈಶ್ವರಪ್ಪ ಮತ್ತು ಜಾರಕಿಹೊಳಿ ಅವರಿಗೆ ಹೇಳಿದ್ದರು.

Follow Us:
Download App:
  • android
  • ios