ಬೆಂಗಳೂರು (ಮೇ. 07):  ರಾಜ್ಯದಲ್ಲಿ ಲೋಕಸಭೆ ಚುನಾವಣೆ ಮುಕ್ತಾಯಗೊಂಡ ಕಾರಣ ಚುನಾವಣಾ ಆಯೋಗವು ನೀತಿ ಸಂಹಿತೆ ಸಡಿಲಗೊಳಿಸಿರುವ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಎಚ್‌.ಡಿ. ಕುಮಾರಸ್ವಾಮಿ ಅವರು ಎರಡು ತಿಂಗಳ ಬಳಿಕ ಗುರುವಾರ (ಮೇ 9) ಸಚಿವ ಸಂಪುಟ ಸಭೆಯನ್ನು ಕರೆದಿದ್ದಾರೆ.

ರಾಜ್ಯದಲ್ಲಿ ಕಾಡುತ್ತಿರುವ ಬರ ಪರಿಸ್ಥಿತಿ ಹಾಗೂ ಕುಡಿಯುವ ನೀರಿನ ಸಮಸ್ಯೆಯನ್ನು ಪರಿಣಾಮಕಾರಿಯಾಗಿ ಎದುರಿಸುವ ಉದ್ದೇಶದಿಂದ ಹಲವು ನಿರ್ಧಾರಗಳನ್ನು ಕೈಗೊಳ್ಳುವ ಸಾಧ್ಯತೆಯಿದೆ.

ಜೊತೆಗೆ ಮೈತ್ರಿ ಸರ್ಕಾರದ ಪತನ ಕುರಿತು ಬಿಜೆಪಿ ಹಲವು ಟೀಕೆಗಳನ್ನು ಮಾಡುತ್ತಿರುವುದರ ಜತೆಗೆ ನಾನಾ ರೀತಿಯ ವದಂತಿಗಳು ಸಹ ಹಬ್ಬುತ್ತಿವೆ. ಸಚಿವ ಸಂಪುಟ ಸಭೆಯಲ್ಲಿ ಎಲ್ಲಾ ಸಚಿವರು ಭಾಗವಹಿಸುವುದರಿಂದ ಅಲ್ಲಿ ಅನೌಪಚಾರಿಕವಾಗಿ ಈ ಬಗ್ಗೆ ಚರ್ಚೆ ನಡೆಯುವ ನಿರೀಕ್ಷೆಯಿದೆ ಎಂದು ಮೂಲಗಳು ತಿಳಿಸಿವೆ.

ಗುರುವಾರ ಬೆಳಗ್ಗೆ 11 ಗಂಟೆಗೆ ವಿಧಾನಸೌಧದ ಮೂರನೇ ಮಹಡಿಯಲ್ಲಿನ ಸಚಿವ ಸಂಪುಟ ಸಭೆಯ ಸಭಾಂಗಣದಲ್ಲಿ ಸಭೆ ಕರೆಯಲಾಗಿದೆ. ಲೋಕಸಭೆ ಚುನಾವಣೆ ಘೋಷಣೆಯಾದ ಬಳಿಕ ಅಭಿವೃದ್ಧಿ ಕಾರ್ಯಗಳು ಸೇರಿದಂತೆ ಇತರೆ ಯೋಜನೆಗಳ ಜಾರಿಯಲ್ಲಿ ವಿಳಂಬವಾಗಿದೆ. ಯೋಜನೆಗಳು ಸೇರಿದಂತೆ ಅಭಿವೃದ್ಧಿ ಕೆಲಸಗಳ ಕುರಿತು ಸಚಿವ ಸಂಪುಟದಲ್ಲಿ ಮಹತ್ವದ ತೀರ್ಮಾನಗಳನ್ನು ಕೈಗೊಳ್ಳಲಾಗುವುದು. ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ನೀತಿ ಸಂಹಿತೆ ಜಾರಿಯಲ್ಲಿತ್ತು. ಎರಡು ಹಂತದ ಚುನಾವಣೆ ಮುಕ್ತಾಯವಾಗಿದ್ದು, ಆಯೋಗವು ನೀತಿ ಸಂಹಿತೆಯನ್ನು ಸಡಿಲಗೊಳಿಸಿದೆ. ಹೀಗಾಗಿ ಸಚಿವ ಸಂಪುಟ ಸಭೆ ಕರೆದು ಹಲವು ಯೋಜನೆಗಳ ಬಗ್ಗೆ ಮಹತ್ವದ ನಿರ್ಧಾರ ಕೈಗೊಳ್ಳುವ ಸಾಧ್ಯತೆ ಇದೆ ಎಂದು ಮೂಲಗಳು ಹೇಳಿವೆ.

ಸರ್ಕಾರ ಮತ್ತು ಮುಖ್ಯಮಂತ್ರಿ ಸ್ಥಾನದ ಬಗ್ಗೆ ಹಲವು ಬಿಜೆಪಿ ನಾಯಕರು ಮಾತ್ರವಲ್ಲದೇ, ಮೈತ್ರಿ ಸರ್ಕಾರದಲ್ಲಿಯೂ ನಾನಾ ರೀತಿಯಾಗಿ ವ್ಯಾಖ್ಯಾನಿಸಲಾಗುತ್ತಿದೆ. ಇದು ಮುಖ್ಯಮಂತ್ರಿಗಳ ನಿದ್ದೆಗೆಡಿಸಿದ್ದು, ಬಹಿರಂಗವಾಗಿ ಮಿತ್ರ ಪಕ್ಷಗಳ ನಾಯಕರೇ ಮನಸೋ ಇಚ್ಛೆ ಹೇಳಿಕೆ ನೀಡದಂತೆ ಸಚಿವ ಸಂಪುಟ ಸಭೆಯಲ್ಲಿ ಸೂಚಿಸುವ ಸಂಭವವಿದೆ.

ಇತ್ತೀಚೆಗೆ ಕಾಂಗ್ರೆಸ್‌ನ ಕೆಲ ನಾಯಕರು ಸರ್ಕಾರಕ್ಕೆ ಮುಜುಗರ ಉಂಟುಮಾಡುವಂತಹ ಹೇಳಿಕೆಗಳನ್ನು ನೀಡುತ್ತಿದ್ದಾರೆ. ಇನ್ನು ಕೆಲವರು ಮುಖ್ಯಮಂತ್ರಿ ಹುದ್ದೆಯ ಬಗ್ಗೆ ಪ್ರಸ್ತಾಪಿಸುತ್ತಿದ್ದಾರೆ. ಇದನ್ನೇ ಬಿಜೆಪಿ ತನ್ನ ಅಸ್ತ್ರವನ್ನಾಗಿ ಬಳಸಿಕೊಂಡು ಸರ್ಕಾರದ ವಿರುದ್ಧ ಟೀಕಾಪ್ರಹಾರ ನಡೆಸುತ್ತಿದೆ. ಹೀಗಾಗಿ ಪ್ರತಿಪಕ್ಷಕ್ಕೆ ತಿರುಗೇಟು ನೀಡಲು ಮುಖ್ಯಮಂತ್ರಿ ಕುಮಾರಸ್ವಾಮಿ ಕಸರತ್ತು ಆರಂಭಿಸಿದ್ದಾರೆ. ಈ ಬಗ್ಗೆ ಸಂಪುಟ ಸಭೆಯಲ್ಲಿ ಪ್ರಸ್ತಾಪವಾಗಬಹುದು ಎಂದು ಹೇಳಲಾಗಿದೆ.