ನಿಖಿಲ್ ಕುಮಾರಸ್ವಾಮಿಗೆ ಚನ್ನಪಟ್ಟಣ ಮೈತ್ರಿ ಟಿಕೆಟ್ ಫಿಕ್ಸ್: ದೇವೇಗೌಡ ಘೋಷಣೆ
ಚನ್ನಪಟ್ಟಣ ವಿಧಾನಸಭಾ ಕ್ಷೇತ್ರಕ್ಕೆ ನಿಖಿಲ್ ಕುಮಾರಸ್ವಾಮಿ ಜೆಡಿಎಸ್-ಬಿಜೆಪಿಯ ಮೈತ್ರಿಕೂಟದ ಅಭ್ಯರ್ಥಿಯಾಗಿ ಸ್ಪರ್ಧಿಸಲಿದ್ದಾರೆ ಎಂದು ಹೆಚ್.ಡಿ. ದೇವೇಗೌಡ ಘೋಷಿಸಿದ್ದಾರೆ. ಸಿ.ಪಿ. ಯೋಗೇಶ್ವರ್ ಕಾಂಗ್ರೆಸ್ ಸೇರ್ಪಡೆಯಾದ ಬೆನ್ನಲ್ಲೇ ಈ ಘೋಷಣೆ ಹೊರಬಿದ್ದಿದೆ.
ಬೆಂಗಳೂರು (ಅ.24): ಕರ್ನಾಟಕ ವಿಧಾನಸಭಾ ಉಪ ಚುನಾವಣೆಯಲ್ಲಿ ಅತ್ಯಂತ ಕುತೂಹಲ ಕೆರಳಿಸಿದ್ದ ಚನ್ನಪಟ್ಟಣ ವಿಧಾನಸಭಾ ಕ್ಷೇತ್ರಕ್ಕೆ ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡ ಹಾಗೂ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಅವರ ಪುತ್ರ ನಿಖಿಲ್ ಕುಮಾರಸ್ವಾಮಿ ಜೆಡಿಎಸ್-ಬಿಜೆಪಿಯ ಮೈತ್ರಿಕೂಟದ ಎನ್‌ಡಿಎ ಅಭ್ಯರ್ಥಿಯಾಗಿ ಸ್ಪರ್ಧಿಸಲಿದ್ದಾರೆ. ಚನ್ನಪಟ್ಟಣಕ್ಕೆ ನಿಖಿಲ್ ಕುಮಾರಸ್ವಾಮಿಯೇ ಎನ್‌ಡಿಎ ಮೈತ್ರಿಕೂಟದ ಅಭ್ಯರ್ಥಿ ಮಾಡಲಾಗುವುದು ಎಂದು ಸ್ವತಃ ಜೆಡಿಎಸ್ ವರಿಷ್ಠ ಹೆಚ್.ಡಿ. ದೇವೇಗೌಡ ಅವರು ತಿಳಿಸಿದ್ದಾರೆ.
ಚನ್ನಪಟ್ಟಣದಲ್ಲಿ ಎನ್‌ಡಿಎ ಮೈತ್ರಿಕೂಟದ ಟಿಕೆಟ್ ಆಕಾಂಕ್ಷಿ ಆಗಿದ್ದ ಸಿ.ಪಿ. ಯೋಗೇಶ್ವರ್ ಅವರು ಬಿಜೆಪಿ ತೊರೆದು ಕಾಂಗ್ರೆಸ್ ಸೇರ್ಪಡೆಯಾದ ಬೆನ್ನಲ್ಲಿಯೇ ಇದೀಗ ಎನ್‌ಡಿಎ ಮೈತ್ರಿಕೂಟದ ಅಭ್ಯರ್ಥಿ ಆಯ್ಕೆಗೆ ಯಾವುದೇ ಅಡ್ಡಿ ಆತಂಕಗಳೂ ಇಲ್ಲವಾಗಿವೆ. ಇನ್ನು ಚನ್ನಪಟ್ಟಣ ಕ್ಷೇತ್ರವು ಕುಮಾರಸ್ವಾಮಿ ಅವರು ಗೆದ್ದು ಬಿಟ್ಟುಕೊಟ್ಟಿರುವ ಕ್ಷೇತ್ರವಾಗಿದ್ದರಿಂದ ಇಲ್ಲಿ ಜೆಡಿಎಸ್ ಅಭ್ಯರ್ಥಿ ಹಾಕುವುದಕ್ಕೆ ಮೈತ್ರಿ ಕೂಟದಲ್ಲಿ ಚರ್ಚೆ ಮಾಡಲಾಗಿದೆ. ಇದೀಗ ಯೋಗೇಶ್ವರ್ ಬಿಜೆಪಿ ತೊರೆದು, ಕಾಂಗ್ರೆಸ್ ಸೇರಿದ ಬೆನ್ನಲ್ಲಿಯೇ ಎನ್‌ಡಿಎ ಅಭ್ಯರ್ಥಿ ಘೋಷಣೆಗೆ ಹೆಚ್.ಡಿ. ಕುಮಾರಸ್ವಾಮಿ ಹಾಗೂ ದೇವೇಗೌಡರು ಸೇರಿದಂತೆ ಹಲವು ನಾಯಕರು ಬಿಜೆಪಿ ನಾಯಕ ಬಿ.ಎಸ್. ಯಡಿಯೂರಪ್ಪ ಅವರ ಮನೆಯಲ್ಲಿ ಅಂತಿಮ ಚರ್ಚೆ ನಡೆಸಿ ಅಭ್ಯರ್ಥಿ ಯಾರೆಂದು ಘೋಷಣೆ ಮಾಡಲಿದ್ದಾರೆ.
ಇದನ್ನೂ ಓದಿ: ಜೆಡಿಎಸ್-ಬಿಜೆಪಿ ಮೈತ್ರಿ ಮುರಿಯುತ್ತಾ? ಕುಮಾರಸ್ವಾಮಿ ಹೇಳಿಕೆಯ ಒಳಮರ್ಮವೇನು?
ಇನ್ನು ಯಡಿಯೂರಪ್ಪ ಅವರ ಮನೆಗೆ ಜೆಡಿಎಸ್ ನಾಯಕರು ಹೋಗುವ ಮುನ್ನ ಮಾಧ್ಯಮಗಳೊಂದಿಗೆ ಮಾತನಾಡಿದ ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡ ಅವರು, ನಿಖಿಲ್ ಅಭ್ಯರ್ಥಿಯಾಗಿ ಸ್ಪರ್ಧಿಸೋಕೆ ನಾವು ತೀರ್ಮಾನಿಸಿದ್ದೇವೆ. ಕಾರ್ಯಕರ್ತರೂ ಕೂಡ ನಮ್ಮ ಬಳಿಗೆ ಬಂದು ನಿಖಿಲ್ ಕುಮಾರಸ್ವಾಮಿಯನ್ನು ಅಭ್ಯರ್ಥಿ ಮಾಡಿ ಅಂತ ಹೇಳಿದ್ದಾರೆ. ಯಡಿಯೂರಪ್ಪನವರು ನಿಖಿಲ್ ಅವರನ್ನ NDA ಅಭ್ಯರ್ಥಿಯನ್ನಾಗಿ ಘೋಷಣೆ ಮಾಡುತ್ತಾರೆ. ನಾಳೆ ನಾನು ಕೂಡ ಮೊಮ್ಮಗನ ನಾಮಿನೇಷನ್ ಸಲ್ಲಿಸೋ ಕಾರ್ಯಕ್ರಮದಲ್ಲಿ ಭಾಗಿಯಾಗುತ್ತೇನೆ ಎಂದು ಹೇಳಿದರು.