ಸಚಿವ ಸಂಪುಟ ವಿಸ್ತರಣೆ: ಸಿದ್ದರಾಮಯ್ಯ ಹಾಗೂ ಡಿ.ಕೆ.ಶಿವಕುಮಾರ್ ನಡುವೆ ಜಟಾಪಟಿ!
ರಾಜ್ಯ ರಾಜಕಾರಣದಲ್ಲಿ ಸಚಿವ ಸಂಪುಟ ವಿಸ್ತರಣೆ ವಿಚಾರವಾಗಿ ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ.ಕೆ ಶಿವಕುಮಾರ್ ನಡುವೆ ಜಟಾಪಟಿ ನಡೆದಿದೆ. ಅಧಿವೇಶನ ಮುಗಿದ ಬಳಿಕ ಸಿದ್ದರಾಮಯ್ಯ, ಡಿ.ಕೆ.ಶಿವಕುಮಾರ್ ದೆಹಲಿಗೆ ತೆರಳಲಿದ್ದಾರೆ.
ಬೆಂಗಳೂರು (ಮೇ.22): ರಾಜ್ಯ ರಾಜಕಾರಣದಲ್ಲಿ ಸಚಿವ ಸಂಪುಟ ವಿಸ್ತರಣೆ ವಿಚಾರವಾಗಿ ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ.ಕೆ ಶಿವಕುಮಾರ್ ನಡುವೆ ಜಟಾಪಟಿ ನಡೆದಿದೆ. ಅಧಿವೇಶನ ಮುಗಿದ ಬಳಿಕ ಸಿದ್ದರಾಮಯ್ಯ, ಡಿ.ಕೆ.ಶಿವಕುಮಾರ್ ದೆಹಲಿಗೆ ತೆರಳಲಿದ್ದು, ಅದಕ್ಕೂ ಮುನ್ನವೇ ರಣತಂತ್ರ- ರೂಪಿಸಲು ಸಿಎಂ ಸಿದ್ದರಾಮಯ್ಯ ಮುಂದಾಗಿದ್ದಾರೆ. ಜೊತೆಗೆ ಆಪ್ತರ ಜೊತೆಗೆ ಸಿಎಂ ಸಿದ್ದರಾಮಯ್ಯ ಮಾತುಕತೆ ನಡೆಸಿದ್ದಾರೆ. ಗೌಪ್ಯ ಸ್ಥಳದಲ್ಲಿ ಬೈರತಿ ಸುರೇಶ್ ಹಾಗೂ ಸಚಿವ ಕೆ.ಜೆ ಜಾರ್ಜ್ ಜೊತೆ ಸುಮಾರು ಅರ್ಧ ಗಂಟೆಗೂ ಹೆಚ್ಚು ಕಾಲ ಸಿದ್ದರಾಮಯ್ಯ ಮಾತುಕತೆ ನಡೆಸಿದ್ದು, ಬೆಂಬಲಿಗರನ್ನ ಸಂಪುಟಕ್ಕೆ ಸೇರಿಸುವ ಸಂಬಂಧ ಆಪ್ತರ ಜೊತೆ ಸಿದ್ದರಾಮಯ್ಯ ಚರ್ಚೆ ನಡೆಸಿದ್ದಾರೆ.
ಹಿರಿಯ ಅಧಿಕಾರಿಗಳ ಸಭೆ ಕರೆದ ಸಿದ್ದು: ಆಡಳಿತ ಯಂತ್ರಕ್ಕೆ ಚುರುಕು ನೀಡುವ ಹಿನ್ನಲೆಯಲ್ಲಿ ಸರ್ಕಾರದ ಹಿರಿಯ ಅಧಿಕಾರಿಗಳ ಸಭೆಯನ್ನು ಸಿಎಂ ಸಿದ್ದರಾಮಯ್ಯ ಕರೆದಿದ್ದು, ಸರ್ಕಾರದ ಅಪಾರ ಮುಖ್ಯ ಕಾರ್ಯದರ್ಶಿಗಳು ಪ್ರಧಾನ ಕಾರ್ಯದರ್ಶಿಗಳು ಕಾರ್ಯದರ್ಶಿಗಳ ಸಭೆ ಏರ್ಪಡಿದ್ದಾರೆ. ನಾಳೆ ಸಂಜೆ 5 ಗಂಟೆಗೆ ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಅಧಿಕಾರಗಳ ಜೊತೆ ಸಭೆ ನಡೆಸಲಿರುವ ಸಿಎಂ ಸಿದ್ದರಾಮಯ್ಯ ಸರ್ಕಾರದ ಯೋಜನೆಗಳ ಅನುಷ್ಠಾನಕ್ಕೆ ಸಂಭವಿಸಿದಂತೆ ಅಧಿಕಾರಿಗಳ ಜೊತೆ ಚರ್ಚೆ ನಡೆಸಲಿದ್ದಾರೆ.
ಪ್ರಕೃತಿ ಯಾರ ಕೈಯಲ್ಲೂ ಇಲ್ಲ, ಎಚ್ಚರಿಕೆ ಇರಬೇಕು: ಡಿ.ಕೆ.ಶಿವಕುಮಾರ್
ವಿಧಾನಸೌಧದಲ್ಲಿ ವೀಡಿಯೋ ಸಂವಾದ: ಇನ್ನು ರಾಜ್ಯಾದ್ಯಾಂತ ಪೂರ್ವ ಮುಂಗಾರು ಮಳೆ ಅವಾಂತರ ಹಿನ್ನೆಲೆಯಲ್ಲಿ ನಾಳೆ ರಾಜ್ಯದ ಎಲ್ಲಾ ಜಿಲ್ಲಾಧಿಕಾರಿ ಹಾಗೂ ಜಿಲ್ಲೆಗಳ ಸಿಇಓಗಳ ಜೊತೆ ಸಿಎಂ ಸಿದ್ದರಾಮಯ್ಯ ವೀಡಿಯೋ ಕಾನ್ಫರೆನ್ಸ್ ಅನ್ನು ವಿಧಾನಸೌಧದಲ್ಲಿ ಮಧ್ಯಾಹ್ನ 3 ಗಂಟೆಗೆ ವೀಡಿಯೋ ಸಂವಾದವನ್ನು ನಡೆಸಲಿದ್ದಾರೆ. ರಾಜ್ಯದಲ್ಲಿ ವಿವಿಧ ಭಾಗಗಳಲ್ಲಿ ಪೂರ್ವ ಮುಂಗಾರು ಮಳೆಯಿಂದ ಆದಾ ಅನಾಹುತಗಳ ಬಗ್ಗೆ ಡಿಸಿಗಳಿಂದ ಸಿಎಂ ಸಿದ್ದರಾಮಯ್ಯ ಮಾಹಿತಿ ಪಡೆಯಲಿದ್ದಾರೆ. ಅಲ್ಲದೇ ಸಹಕಾರ ಸಂಘಗಳಿಗೆ ಮಾಡಿರುವ ಅಧಿಕಾರೇತರ ಸದಸ್ಯರ ನೇಮಕ ಮತ್ತು ನಾಮಕರಣ ರದ್ದು ಮಾಡಿ ರಾಜ್ಯ ಸರ್ಕಾರದ ಆದೇಶ ಹೊರಡಿಸಿದೆ.
ಸಚಿವಗಿರಿ ಸಿಗದಿದ್ದಕ್ಕೆ ಹಿರಿಯ ಶಾಸಕರ ಅಸಮಾಧಾನ: ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರದಲ್ಲಿ ಮೊದಲ ಹಂತದಲ್ಲಿ ಮಂತ್ರಿಗಿರಿ ಸಿಗದಿದ್ದಕ್ಕೆ ಹಲವು ಹಿರಿಯ ಶಾಸಕರು ತಮ್ಮ ಅಸಮಾಧಾನ ವ್ಯಕ್ತಪಡಿಸಿದ್ದು, ಮುಂದಿನ ಸಂಪುಟ ವಿಸ್ತರಣೆ ವೇಳೆ ತಮಗೆ ಸಚಿವ ಸ್ಥಾನ ಸಿಗುವ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಹಾವೇರಿ (ಎಸ್ಸಿ ಮೀಸಲು) ಶಾಸಕ ರುದ್ರಪ್ಪ ಲಮಾಣಿ ಮಾತನಾಡಿ, ಲಮಾಣಿ ಸಮುದಾಯದಿಂದ ಆಯ್ಕೆಯಾದ ಏಕೈಕ ಕಾಂಗ್ರೆಸ್ ಶಾಸಕ ನಾನು. ಹೀಗಾಗಿ, ಮುಂದಿನ ಸಂಪುಟ ವಿಸ್ತರಣೆ ವೇಳೆ ಸಚಿವ ಸ್ಥಾನಕ್ಕೆ ನಮ್ಮ ಸಮುದಾಯದವರನ್ನು ಪರಿಗಣನೆ ಮಾಡುತ್ತಾರೆ ಎಂಬ ವಿಶ್ವಾಸವಿದೆ. ಜಾತಿವಾರು, ಜಿಲ್ಲಾವಾರು ಯಾರಿಗೆ ಸಚಿವ ಸ್ಥಾನ ನೀಡಬೇಕು ಎನ್ನುವ ಬಗ್ಗೆ ಚರ್ಚೆ ನಡೆದಿದೆ.
ಜನತೆಗೆ ಕೊಟ್ಟ ಮಾತಿನಂತೆ ನಡೆದುಕೊಳ್ಳುವೆ: ಮಾಗಡಿ ಶಾಸಕ ಬಾಲಕೃಷ್ಣ
ಸದ್ಯಕ್ಕೆ 8 ಶಾಸಕರಷ್ಟೇ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ. ಪಕ್ಷದಲ್ಲಿ ಅನೇಕರು ಹಿರಿಯ ನಾಯಕರಿದ್ದರೂ ನಮ್ಮ ಸಮುದಾಯವನ್ನು ಪರಿಗಣಿಸುತ್ತಾರೆ ಎಂಬ ವಿಶ್ವಾಸವಿದೆ ಎಂದು ತಿಳಿಸಿದ್ದಾರೆ. ಬ್ಯಾಡಗಿ ಶಾಸಕ ಬಸವರಾಜ ಶಿವಣ್ಣನವರ ಮಾತನಾಡಿ, ನಾನು ನಾಲ್ಕು ಬಾರಿ ಶಾಸಕನಾಗಿದ್ದು, ಸಚಿವ ಸ್ಥಾನ ನೀಡುವಂತೆ ಮನವಿ ಮಾಡಿದ್ದೇನೆ. ಜಿಲ್ಲೆಯಲ್ಲಿ ಇನ್ನೂ ಕೆಲವರು ಸಚಿವ ಸ್ಥಾನಕ್ಕೆ ಬೇಡಿಕೆ ಇಟ್ಟಿದ್ದಾರೆ. ಜಿಲ್ಲೆಯಲ್ಲಿ ಹಿರಿಯ ಶಾಸಕನಿದ್ದೇನೆ ಎಂದು ಸಿದ್ದರಾಮಯ್ಯ ಅವರಿಗೂ ಹೇಳಿದ್ದೇನೆ. ನನಗೂ ಸಚಿವ ಸ್ಥಾನ ಸಿಗುವ ವಿಶ್ವಾಸವಿದೆ ಎಂದರು. ಇದೇ ವೇಳೆ, ಹಾನಗಲ್ಲ ಶಾಸಕ ಶ್ರೀನಿವಾಸ ಮಾನೆ ಕೂಡ ಸಂಪುಟ ವಿಸ್ತರಣೆ ವೇಳೆ ತಮಗೆ ಸಚಿವ ಸ್ಥಾನ ಸಿಗುವ ವಿಶ್ವಾಸ ವ್ಯಕ್ತಪಡಿಸಿದ್ದಾರೆ.