ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ವರುಣಾ ಕ್ಷೇತ್ರದ ಜನತೆ ಮುಂದೆ ತಮ್ಮ ಮನದ ಇಂಗಿತ ವ್ಯಕ್ತಪಡಿಸಿದ್ದಾರೆ. ಸಿಎಂ ಹೇಳಿಕೆ ರಾಜಕೀಯ ಮೊಗಸಾಲೆಯಲ್ಲಿ ತೀವ್ರ ಚರ್ಚೆಗೆ ಗ್ರಾಸವಾಗಿದೆ.
ಮೈಸೂರು: ಸಿಎಂ ಸಿದ್ದರಾಮಯ್ಯ ಅವರು ತಮ್ಮ ವಿಧಾನಸಭಾ ಕ್ಷೇತ್ರ ವರುಣಾ ಜನತೆ ಮುಂದೆ ಮನದ ಇಂಗಿತವನ್ನು ವ್ಯಕ್ತಪಡಿಸಿದ್ದಾರೆ. ರಾಜ್ಯದಲ್ಲಿ ಸಿಎಂ ಬದಲಾವಣೆ ಚರ್ಚೆ ತಣ್ಣಗಾಗುತ್ತಿದ್ದಂತೆ ಸಿದ್ದರಾಮಯ್ಯನವರು ಹೊಸ ಆಸೆಯೊಂದನ್ನು ವ್ಯಕ್ತಪಡಿಸಿದ್ದಾರೆ. ಕಳೆದ ಅಸೆಂಬ್ಲಿ ಎಲೆಕ್ಷನ್ ವೇಳೆ ಚುನಾವಣಾ ನಿವೃತ್ತಿಯ ಮಾತುಗಳನ್ನಾಡಿದ್ದರು. ಇದೀಗ ವರುಣಾ ಕ್ಷೇತ್ರದ ಜನತೆ ಮುಂದೆ ಮುಂದಿನ ಚುನಾವಣೆಯಲ್ಲಿಯೂ ನನ್ನನ್ನು ಕೈ ಹಿಡಿಯಿರಿ ಎಂದು ಸಿಎಂ ಸಿದ್ದರಾಮಯ್ಯ ಮನವಿ ಮಾಡಿಕೊಂಡಿದ್ದಾರೆ. ಈ ಮೂಲಕ ಮುಂದಿನ ವಿಧಾನಸಭಾ ಚುನಾವಣೆಯಲ್ಲಿಯೂ ಸ್ಪರ್ಧಿಸುವ ಸುಳಿವು ನೀಡಿದ್ದಾರೆ.
ನಾನು ಸಿಎಂ ಆಗಲು ಅಂಬೇಡ್ಕರ್ ಸಂವಿಧಾನವೇ ಕಾರಣ. ನಾವು ಉಳಿಯಬೇಕಾದ್ರೆ ಎಲ್ಲರಿಗೂ ಸಮಾನ ಅವಕಾಶ ಸಿಗಬೇಕಾದ್ರೆ ಸಂವಿಧಾನ ಉಳಿಸಬೇಕು. ಈಗ ನನ್ನನ್ನು ಹೇಗೆ ಬೇಳೆಸಿದ್ರೊ ಅದೇ ರೀತಿ ಮುಂದೆಯೂ ಶಕ್ತಿ ತುಂಬಬೇಕು. ಮುಂದಿನ ಚುನಾವಣೆಯಲ್ಲಿ ನನ್ನ ಕೈ ಹಿಡಿಯಿರಿ. ಗುಲಗಂಜಿಯಷ್ಟು ಹೆಚ್ಚಾಗಿ ವರುಣಾ ಕ್ಷೇತ್ರಕ್ಕೆ ನಾನು ಕೆಲಸ ಮಾಡುತ್ತೇನೆ ಎಂದು ಸಿಎಂ ಸಿದ್ದರಾಮಯ್ಯ ಮನವಿ ಮಾಡಿಕೊಂಡಿದ್ದಾರೆ.
ಚಾಮುಂಡೇಶ್ವರಿ, ವರುಣಾ ಕ್ಷೇತ್ರದ ಜನತೆಗೆ ಸದಾ ಋಣಿ
ನಾನು 1983ರಲ್ಲಿ ಚಾಮುಂಡೇಶ್ವರಿ ಕ್ಷೇತ್ರದಿಂದ ಶಾಸಕನಾಗಿ ವಿಧಾನಸಭೆ ಪ್ರವೇಶಿಸಿದೆ. ನಿಮ್ಮೆಲ್ಲರ ಆಶೀರ್ವಾದದಿಂದ ನಾನು ಪಕ್ಷೇತರ ಅಭ್ಯರ್ಥಿಯಾಗಿ ಶಾಸಕನಾದರೂ ಕೂಡ, ಅಂದಿನ ಮುಖ್ಯಮಂತ್ರಿಯಾಗಿದ್ದ ರಾಮಕೃಷ್ಣ ಹೆಗ್ಡೆಯವರು ನನ್ನನ್ನು ಕನ್ನಡ ಕಾವಲು ಸಮಿತಿಯ ಅಧ್ಯಕ್ಷರನ್ನಾಗಿ ಮಾಡಿದರು. 1984ನೇ ಇಸವಿಯ ಆಗಸ್ಟ್ ತಿಂಗಳಲ್ಲಿ ಮಂತ್ರಿಯನ್ನಾಗಿ ಮಾಡಿದರು. ಈಗಾಗಲೇ ನಾನು ಮಂತ್ರಿಯಾಗಿ 41 ವರ್ಷಗಳಾಗಿದ್ದಾವೆ. 2008ರಲ್ಲಿ ನಾನು ವರುಣಾ ವಿಧಾನಸಭಾ ಕ್ಷೇತ್ರದಿಂದ ಸ್ಪರ್ಧೆ ಮಾಡಿದೆ. 5 ಬಾರಿ 6 ಚುನಾವಣೆಗಳಲ್ಲಿ ನನ್ನನ್ನು ಚಾಮುಂಡೇಶ್ವರಿ ಕ್ಷೇತ್ರದ ಜನತೆ ಆಶೀರ್ವಾದ ಮಾಡಿ ವಿಧಾನಸಭೆಗೆ ಕಳುಹಿಸಿಕೊಟ್ಟಿದ್ದರು. ವರುಣಾ ಕ್ಷೇತ್ರದಲ್ಲಿ 3 ಬಾರಿ ಆಯ್ಕೆಯಾಗಿ ವಿಧಾನಸಭಾ ಸದಸ್ಯನಾಗಲೂ ಅವಕಾಶವನ್ನು ಕಲ್ಪಿಸಿಕೊಟ್ಟಿದ್ದಾರೆ.
ನಾನು ಎರಡು ಬಾರಿ ಈ ರಾಜ್ಯದ ಮುಖ್ಯಮಂತ್ರಿಯಾಗಿದ್ರೆ ವರುಣಾ ಕ್ಷೇತ್ರದ ಜನರ ಆಶೀರ್ವಾದದಿಂದ. ಚಾಮುಂಡೇಶ್ವರಿ ಕ್ಷೇತ್ರ ಹಾಗೂ ವರುಣಾ ಕ್ಷೇತ್ರದ ಜನತೆಗೆ ನಾನು ಸದಾ ಋಣಿಯಾಗಿರುತ್ತೇನೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಇದೇ ವೇಳೆ ವರುಣಾ ವಿಧಾನಸಭಾ ಕ್ಷೇತ್ರದಲ್ಲಿ ₹1,107 ಕೋಟಿ 72 ಲಕ್ಷ ಮೊತ್ತದ ಅಭಿವೃದ್ಧಿ ಕಾರ್ಯಗಳಿಗೆ ಚಾಲನೆ ನೀಡಲಾಗಿದೆ.
ತಂದೆಗಾಗಿ ಕ್ಷೇತ್ರ ತ್ಯಾಗ ಮಾಡಿದ್ದ ಯತೀಂದ್ರ!
2018ರ ಚುನಾವಣೆಯಲ್ಲಿ ವರುಣಾ ಕ್ಷೇತ್ರದಿಂದ ಸ್ಪರ್ಧಿಸಿ ಯತೀಂದ್ರ ಸಿದ್ದರಾಮಯ್ಯ ಶಾಸಕರಾಗಿ ಆಯ್ಕೆಯಾಗಿದ್ದರು. ಈ ವೇಳೆ ಸಿದ್ದರಾಮಯ್ಯನವರು ಚಾಮುಂಡೇಶ್ವರಿ ಮತ್ತು ಬಾದಾಮಿ ವಿಧಾನಸಭಾ ಕ್ಷೇತ್ರದಿಂದ ಸ್ಪರ್ಧೆ ಮಾಡಿದ್ದರು. ಚಾಮುಂಡೇಶ್ವರಿಯಲ್ಲಿ ಜೆಡಿಎಸ್‌ನ ಜಿ.ಟಿ.ದೇವೇಗೌಡರ ವಿರುದ್ಧ ಸೋತ ಸಿದ್ದರಾಮಯ್ಯ, ಬಾದಾಮಿಯಲ್ಲಿ ಮಾಜಿ ಸಚಿವ ಬಿ.ಶ್ರೀರಾಮುಲು ವಿರುದ್ಧ ಕಡಿಮೆ ಮತಗಳ ಅಂತರದಲ್ಲಿ ಗೆದ್ದಿದ್ದರು. 2023ರಲ್ಲಿ ವರುಣಾ ಕ್ಷೇತ್ರದಿಂದ ಸಿಎಂ ಸಿದ್ದರಾಮಯ್ಯ ಸ್ಪರ್ಧಿಸಿದ್ದರು.
ತಂದೆಗಾಗಿ ಯತೀಂದ್ರ ಕ್ಷೇತ್ರ ತ್ಯಾಗ ಮಾಡಿದ್ದರು. 2023ರಲ್ಲಿ ಸಿದ್ದರಾಮಯ್ಯ ಎದುರಾಳಿಯಾಗಿ ಬಿಜೆಪಿ, ಹಾಲಿ ಕೇಂದ್ರ ರೈಲ್ವೆ ರಾಜ್ಯ ಸಚಿವ ವಿ.ಸೋಮಣ್ಣ ಅವರನ್ನು ಕಣಕ್ಕಿಳಿಸಿತ್ತು. ಚಾಮರಾಜನಗರ ಮತ್ತು ವರುಣಾದಿಂದ ಸ್ಪರ್ಧಿಸಿದ್ದ ವಿ.ಸೋಮಣ್ಣ ಎರಡು ಕ್ಷೇತ್ರಗಳಲ್ಲಿಯೂ ಸೋತಿದ್ದರು. 2019ರಲ್ಲಿ ತುಮಕೂರು ಲೋಕಸಭಾ ಕ್ಷೇತ್ರದಿಂದ ಸ್ಪರ್ಧಿಸಿ, ಕೇಂದ್ರ ಸಂಪುಟದಲ್ಲಿದ್ದಾರೆ.
