ಮಳೆಯಿಂದ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಭೂಕುಸಿತ ಹಾಗೂ ಗೋಡೆ ಕುಸಿತ ಉಂಟಾಗಿ ಸಾವು ಸಂಭವಿಸಿರುವ ಹಿನ್ನೆಲೆಯಲ್ಲಿ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಹಾಗೂ ಜಿಲ್ಲಾಧಿಕಾರಿ ಅವರಿಗೆ ಕೂಡಲೇ ಸ್ಥಳಕ್ಕೆ ಭೇಟಿ ನೀಡಿ ಅಗತ್ಯ ಕ್ರಮ ಕೈಗೊಳ್ಳುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸೂಚಿಸಿದರು.
ಬೆಂಗಳೂರು (ಮೇ.31): ಮಳೆಯಿಂದ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಭೂಕುಸಿತ ಹಾಗೂ ಗೋಡೆ ಕುಸಿತ ಉಂಟಾಗಿ ಸಾವು ಸಂಭವಿಸಿರುವ ಹಿನ್ನೆಲೆಯಲ್ಲಿ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಹಾಗೂ ಜಿಲ್ಲಾಧಿಕಾರಿ ಅವರಿಗೆ ಕೂಡಲೇ ಸ್ಥಳಕ್ಕೆ ಭೇಟಿ ನೀಡಿ ಅಗತ್ಯ ಕ್ರಮ ಕೈಗೊಳ್ಳುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸೂಚಿಸಿದರು. ವಿಧಾನಸೌಧದಲ್ಲಿ ಶುಕ್ರವಾರ ಏರ್ಪಡಿಸಿದ್ದ ಜಿಲ್ಲಾಧಿಕಾರಿ ಹಾಗೂ ಜಿ.ಪಂ. ಸಿಇಓಗಳ ಜತೆಗಿನ ಸಭೆಯಲ್ಲಿ ಸಚಿವರು ಹಾಗೂ ದಕ್ಷಿಣ ಕನ್ನಡ ಜಿಲ್ಲೆ ಜಿಲ್ಲಾಧಿಕಾರಿಗಳು ಭಾಗವಹಿಸಿದ್ದರು. ಈ ವೇಳೆ ಭೂಕುಸಿತದಿಂದ ಮೂರು ಮಂದಿ ಸಾವನ್ನಪ್ಪಿರುವ ಮಾಹಿತಿ ತರಿಸಿಕೊಂಡು ಮುಖ್ಯಮಂತ್ರಿ ಅವರು, ತಕ್ಷಣ ಸ್ಥಳಕ್ಕೆ ತೆರಳಿ ಪರಿಶೀಲಿಸಿ ಅಗತ್ಯ ಕ್ರಮ ಕೈಗೊಂಡು ವರದಿ ನೀಡುವಂತೆ ಸೂಚಿಸಿ ಕಳುಹಿಸಿದರು.
ಹೀಗಾಗಿ ಶನಿವಾರ ದಕ್ಷಿಣ ಕನ್ನಡ ಜಿಲ್ಲೆ ಪ್ರವಾಸ ಹಮ್ಮಿಕೊಂಡಿದ್ದ ದಿನೇಶ್ ಗುಂಡೂರಾವ್ ಅವರು ಶುಕ್ರವಾರ ಸಂಜೆಯೇ ಜಿಲ್ಲೆಗೆ ತೆರಳಿದರು. ಇದಕ್ಕೂ ಮೊದಲು ಬೆಂಗಳೂರಿನಲ್ಲಿ ಮಾತನಾಡಿದ ಅವರು, ಶನಿವಾರ ತೆರಳಿ ಸಭೆ ನಡೆಸಲು ತೀರ್ಮಾನಿಸಿದ್ದೆ. ಮಳೆ ಹಾಗೂ ಭೂಕುಸಿತದಿಂದ ಮೂರು ಮಂದಿ ಸಾವನ್ನಪ್ಪಿದ್ದಾರೆ. ಈ ಹಿಂದೆಯೇ ಸಭೆ ನಡೆಸಿ ಮಳೆ ಮುನ್ನೆಚ್ಚರಿಕೆಗೆ ಸೂಚನೆ ನೀಡಿದ್ದೆ. ಈಗ ಮತ್ತೆ ಸಭೆ ನಡೆಸಿ ಬೇರೆ ಯಾವ ಕ್ರಮ ಕೈಗೊಳ್ಳಬೇಕು ಎಂಬ ಸೂಚನೆ ನೀಡಲಾಗುವುದು. ಮುಂಜಾಗ್ರತಾ ಕ್ರಮಗಳ ಬಗ್ಗೆ ಕ್ರಮ ಕೈಗೊಳ್ಳುತ್ತೇವೆ ಎಂದು ಭರವಸೆ ನೀಡಿದರು.
ನಿರ್ದೇಶನ ಜಾರಿಗೆ ಆದೇಶ: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನಗರ ಪ್ರದಕ್ಷಿಣೆ ವೇಳೆ ನೀಡಿದ್ದ ನಿರ್ದೇಶನಗಳ ಅನ್ವಯ ಬೆಂಗಳೂರಿನಲ್ಲಿ ಮತ್ತೆ ಮಳೆ ಹಾನಿ, ಪ್ರವಾಹ ಪರಿಸ್ಥಿತಿ ಉಂಟಾಗದಂತೆ ಕಟ್ಟುನಿಟ್ಟಾಗಿ ಕ್ರಮ ಕೈಗೊಳ್ಳುವಂತೆ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ಅವರು ಶುಕ್ರವಾರ ಅಂತರ್ ಇಲಾಖಾ ಸಮನ್ವಯ ಸಮಿತಿ ಸಭೆ ನಡೆಸಿ ಅಧಿಕಾರಿಗಳಿಗೆ ಕಟ್ಟಾಜ್ಞೆ ಮಾಡಿದ್ದಾರೆ. ನಗರದಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳ ಅನುಷ್ಠಾನದ ಸಮಯದಲ್ಲಿ ಉದ್ಭವಿಸುತ್ತಿರುವ ಸಮಸ್ಯೆಗಳ ಪರಿಹರಿಸಲು ವಿವಿಧ ಇಲಾಖೆ/ಸಂಸ್ಥೆಗಳ ನಡುವೆ ಸಮನ್ವಯತೆ ಸಾಧಿಸಲು ತಮ್ಮ ಅಧ್ಯಕ್ಷತೆಯಲ್ಲಿ ರಚಿಸಿರುವ ಅಂತರ ಇಲಾಖಾ ಸಮನ್ವಯ ಸಮಿತಿಯ ಸಭೆ ನಡೆಸಿದ ಮುಖ್ಯಕಾರ್ಯದರ್ಶಿ ಅವರು ಕೆಲ ಇಲಾಖಾ ಅಧಿಕಾರಿ/ನೌಕರರ ವಿರುದ್ಧ ಶಿಸ್ತು ಕ್ರಮಕ್ಕೂ ಸೂಚಿಸಿದ್ದಾರೆ.
ಪ್ರಮುಖವಾಗಿ ಒಳಚರಂಡಿ ಸಮಸ್ಯೆ ಪರಿಹರಿಸುವಂತೆ ಸೂಚಿಸಿದ್ದರೂ ಇದುವರೆಗೂ ಕ್ರಮ ಕೈಗೊಳ್ಳದ ಬೆಂಗಳೂರು ಜಲಮಂಡಳಿಯ ಅಧಿಕಾರಿ/ನೌಕರರ ವಿರುದ್ಧ ಶಿಸ್ತು ಕ್ರಮ ಕೈಗೊಳ್ಳಲು ನಗರಾಭಿವೃದ್ಧಿ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ಅವರಿಗೆ ಸೂಚಿಸಲಾಗಿದೆ. ಮಳೆ ನೀರು ಬಿಡಬ್ಲ್ಯುಎಸ್‌ಎಸ್‌ಬಿಯ ಒಳಚರಂಡಿಗಳಿಗೆ ಸೇರದಂತೆ ಕೂಡಲೇ ಕ್ರಮ ಕೈಗೊಂಡು ವರದಿ ಸಲ್ಲಿಸಲು ಅಭಿಯಂತರಿಗೆ ನಿರ್ದೇಶನ ನೀಡಿದ್ದಾರೆ. ಇನ್ನು ಮುಂದೆ ನಗರದಲ್ಲಿ ಯಾವುದೇ ಇಲಾಖೆಯು ರಸ್ತೆ ಅಗೆದರೆ ಬಿಬಿಎಂಪಿ ವತಿಯಿಂದ ಸಂಬಂಧಪಟ್ಟ ಇಲಾಖೆಗಳಿಂದ ಅನುದಾನ ಪಡೆದು ರಸ್ತೆ ದುರಸ್ತಿ ಕೈಗೊಳ್ಳಲು ಹೊಸ ಸುತ್ತೋಲೆ/ಆದೇಶ ಹೊರಡಿಸಲು ಸೂಚಿಸಿದ್ದಾರೆ.
