ರಾಜ್ಯದಲ್ಲಿ ಮಳೆಗಾಲ ಚೆನ್ನಾಗಿ ಆಗಿದೆ. ಆದರೆ, ರೈತರು ರಸಗೊಬ್ಬರಕ್ಕಾಗಿ ಪರದಾಡುತ್ತಿದ್ದಾರೆ. ರೈತರ ಹೆಸರಿನಲ್ಲಿ ಅಧಿಕಾರಕ್ಕೆ ಬಂದಿರುವ ಸಿದ್ದರಾಮಯ್ಯನವರೇ ರೈತರ ಬಗ್ಗೆ ತಾತ್ಸಾರ ಯಾಕೆ? ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಪ್ರಶ್ನಿಸಿದ್ದಾರೆ.

ಶಿವಮೊಗ್ಗ (ಆ.02): ರಾಜ್ಯದಲ್ಲಿ ಮಳೆಗಾಲ ಚೆನ್ನಾಗಿ ಆಗಿದೆ. ಆದರೆ, ರೈತರು ರಸಗೊಬ್ಬರಕ್ಕಾಗಿ ಪರದಾಡುತ್ತಿದ್ದಾರೆ. ರೈತರ ಹೆಸರಿನಲ್ಲಿ ಅಧಿಕಾರಕ್ಕೆ ಬಂದಿರುವ ಸಿದ್ದರಾಮಯ್ಯನವರೇ ರೈತರ ಬಗ್ಗೆ ತಾತ್ಸಾರ ಯಾಕೆ? ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಪ್ರಶ್ನಿಸಿದ್ದಾರೆ. ರಾಜ್ಯ ಸರ್ಕಾರದ ರೈತ ವಿರೋಧಿ ನೀತಿ ಖಂಡಿಸಿ ನಗರದಲ್ಲಿ ಬಿಜೆಪಿ ರೈತ ಮೋರ್ಚಾ ವತಿಯಿಂದ ಹಮ್ಮಿಕೊಂಡಿದ್ದ ಬೃಹತ್ ಪ್ರತಿಭಟನೆಯಲ್ಲಿ ಮಾತನಾಡಿದರು.

ಅಧಿಕಾರಿಗಳ ಸಭೆ ನಡೆಸಿರುವ ಸಿಎಂ ಸಿದ್ದರಾಮಯ್ಯ ಅವರು ಯೂರಿಯಾ ರಸಗೊಬ್ಬರ ದಾಸ್ತಾನು ಇದೆ ಎನ್ನುತ್ತಿದ್ದಾರೆ. ಆದರೆ ರಸಗೊಬ್ಬರ ಎಲ್ಲಿದೆ? ಎಲ್ಲವನ್ನೂ ಕಾಳಸಂತೆಯಲ್ಲಿ ಮಾರಾಟ ಮಾಡಲಾಗಿದೆ. ಈ ಹಿಂದಿನ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರದಲ್ಲಿ 4,283 ರೈತರು ಆತ್ಮಹತ್ಯೆ ಮಾಡಿಕೊಂಡಿದ್ದರು. ಈಗ 2ನೇ ಅವಧಿಯಲ್ಲಿ 9,00ಕ್ಕೂ ಹೆಚ್ಚು ರೈತರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಆರೋಪಿಸಿದರು.

ಹೋರಾಟ ಮರೆತು ಹಾರಾಟ: ಶಿವಮೊಗ್ಗ ಜಿಲ್ಲಾ ಉಸ್ತುವಾರಿ ಸಚಿವರು ಶಾಸಕರಾಗಿದ್ದಾಗ ಸೊರಬದಿಂದ ಶಿವಮೊಗ್ಗಕ್ಕೆ ಪಾದಯಾತ್ರೆ ಮಾಡಿದ್ದರು. ಅಧಿಕಾರಕ್ಕೆ ಬಂದ ಮೇಲೆ ರೈತರನ್ನು ಮರೆತಿದ್ದು, ಬಗರ್ ಹುಕುಂ ರೈತರ ಬಗ್ಗೆ ಕಾಳಜಿ ಇಲ್ಲ. ಹೋರಾಟ ಮರೆತು ಹಾರಾಟ ಮಾಡುತ್ತಿದ್ದಾರೆ ಎಂದು ಮಧು ಬಂಗಾರಪ್ಪ ವಿರುದ್ಧ ಹರಿಹಾಯ್ದರು. ಸಂಸದ ಬಿ.ವೈ.ರಾಘವೇಂದ್ರ ಮಾತನಾಡಿ, ಕಾಂಗ್ರೆಸ್ ಸರ್ಕಾರ ಭ್ರಷ್ಟ, ರೈತ ವಿರೋಧಿಯಾಗಿದ್ದು, ಅರಣ್ಯ ಕಾಯ್ದೆ-1980 ಜಾರಿಗೂ ಬರುವ ಮೊದಲು ಸಾಗುವಳಿ ಮಾಡಿಕೊಂಡು ಬಂದಿರುವ ರೈತರಿಗೂ ನೋಟಿಸ್ ನೀಡುತ್ತಿದ್ದಾರೆ. ಅರಣ್ಯ ಕಾನೂನು ಬಳಸಿಕೊಂಡು ರೈತರಿಗೆ ನೋಟಿಸ್ ನೀಡಿ ನ್ಯಾಯಾಲಯದ ಕಟೆಕಟೆಗೆ ಹತ್ತಿಸುವ ಕೆಲಸ ರಾಜ್ಯ ಸರ್ಕಾರದಿಂದ ನಡೆಯುತ್ತಿದೆ ಎಂದರು.

ನಿಮ್ಮ ಗೊಡ್ಡು ಬೆದರಿಕೆಗೆ ಹೆದರುವ ಪ್ರಶ್ನೆಯೇ ಇಲ್ಲ. ಅಧಿಕಾರಕ್ಕೆ ಬಂದ ಮೇಲೆ ಶಿಷ್ಟಾಚಾರದ ಬಗ್ಗೆ ಮಾತನಾಡುವ ಸಚಿವರು ರೈತರ ಬಗ್ಗೆ ಯಾಕೆ ಮಾತನಾಡುತ್ತಿಲ್ಲ 1 ಲಕ್ಷಕ್ಕೂ ಹೆಚ್ಚು ರೈತರಿಗೆ ನೋಟಿಸ್ ನೀಡುತ್ತಿದ್ದಾರೆ. ಯಾವುದೇ ಕಾರಣಕ್ಕೂ 3 ಎಕರೆಗಿಂತ ಕಡಿಮೆ ಸಾಗುವಳಿ ಭೂಮಿ ಹೊಂದಿರುವ ರೈತರನ್ನು ತೆರವು ಮಾಡಬಾರದು. ರೈತರ ಭೂಮಿ ತೆರವಿಗೆ ಮುಂದಾದರೆ ಬಿಜೆಪಿಯಿಂದ ಹೋರಾಟ ನಡೆಸಲಾಗುವುದು ಎಂದು ಎಚ್ಚರಿಕೆ ನೀಡಿದರು. ಬಿಜೆಪಿ ರಾಜ್ಯ ಉಪಾಧ್ಯಕ್ಷ ಹರತಾಳು ಹಾಲಪ್ಪ ಹಾಗೂ ಶಾಸಕ ಆರಗ ಜ್ಞಾನೇಂದ್ರ ಮಾತನಾಡಿದರು. ಪ್ರತಿಭಟನೆಯಲ್ಲಿ ಶಾಸಕ ಎಸ್.ಎನ್‌.ಚನ್ನಬಸಪ್ಪ, ಮಾಜಿ ಶಾಸಕರು, ಪಕ್ಷದ ಮುಖಂಡರು, ಕಾರ್ಯಕರ್ತರು ಪಾಲ್ಗೊಂಡಿದ್ದರು.