ಸ್ಕೈಡೆಕ್ ನಿರ್ಮಾಣ, ಸುರಂಗ ರಸ್ತೆ ಸೇರಿದಂತೆ ಬೆಂಗಳೂರು ಅಭಿವೃದ್ಧಿ ವಿಚಾರಗಳ ಬಗ್ಗೆ ಸಿಎಂ ಸಭೆ!
ರಾಜಧಾನಿ ಬೆಂಗಳೂರಿನ ಅಭಿವೃದ್ಧಿ ಯೋಜನೆಗಳಿಗೆ ಸಂಬಂಧಿಸಿದಂತೆ ಬೆಂಗಳೂರಿನ ಶಾಸಕರು ಮತ್ತು ಸಚಿವರು ಸೇರಿದಂತೆ ಹಿರಿಯ ಅಧಿಕಾರಿಗಳೊಂದಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಚರ್ಚಿಸಿದರು.
ಬೆಂಗಳೂರು (ಜು.18): ರಾಜಧಾನಿ ಬೆಂಗಳೂರಿನ ಅಭಿವೃದ್ಧಿ ಯೋಜನೆಗಳಿಗೆ ಸಂಬಂಧಿಸಿದಂತೆ ಬೆಂಗಳೂರಿನ ಶಾಸಕರು ಮತ್ತು ಸಚಿವರು ಸೇರಿದಂತೆ ಹಿರಿಯ ಅಧಿಕಾರಿಗಳೊಂದಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಚರ್ಚಿಸಿದರು. ಮುಖ್ಯಮಂತ್ರಿಗಳ ಗೃಹ ಕಚೇರಿ ಕೃಷ್ಣದಲ್ಲಿ ಸಭೆ ನಡೆಸಲಾಯಿತು. ಈ ವೇಳೆ ರಾಜ್ಯ ಸರ್ಕಾರ ಮಹತ್ವಕಾಂಕ್ಷಿ ಯೋಜನೆಯಾದ ಸ್ಕೈಡೆಕ್ ನಿರ್ಮಾಣ, ಸುರಂಗ ರಸ್ತೆ ನಿರ್ಮಾಣ, ಘನ ತ್ಯಾಜ್ಯದ ವೈಜ್ಞಾನಿಕ ವಿಲೇವಾರಿ, ಹೈ ಡೆನ್ಸಿಟಿ ಕಾರಿಡಾರ್ ಅಭಿವೃದ್ಧಿ ಹಾಗೂ ಪೆರಿಫೆರಲ್ ರಿಂಗ್ ರಸ್ತೆ ಸೇರಿದಂತೆ ಮೊದಲಾದ ಯೋಜನೆಗಳ ಪ್ರಗತಿ ಪರಿಶೀಲನೆ ನಡೆಸಲಾಯಿತು.
ನಾಲ್ಕೈದು ಬಾರಿ ಟೆಂಡರ್ ಕರೆದರು ವಿಫಲವಾಗಿರುವುದರಿಂದ ಪರಿಸರಲ್ ರಿಂಗ್ ರಸ್ತೆ ಅಭಿವೃದ್ಧಿಗೆ ವಿವಿಧ ಸಾಧ್ಯತೆಗಳು ಹಾಗೂ ಸಂಪನ್ಮೂಲ ಕ್ರೋಡೀಕರಣದ ಅವಕಾಶಗಳನ್ನು ಪರಿಶೀಲಿಸಿ ವಿವರವಾದ ಪ್ರಸ್ತಾವನೆಯನ್ನು ಸಚಿವ ಸಂಪುಟ ಸಭೆಗೆ ಮಂಡಿಸುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅಧಿಕಾರಿಗಳಿಗೆ ಸೂಚಿಸಿದರು.
ಜತೆಗೆ, ನಗರದಲ್ಲಿ ವೈಜ್ಞಾನಿಕ ಘನತ್ಯಾಜ್ಯ ವಿಲೇವಾರಿ, ಬಜೆಟ್‌ನಲ್ಲಿ ಘೋಷಿಸಿದಂತೆ ಸಂಚಾರ ದಟ್ಟಣೆ ನಿವಾರಣೆಗೆ ಸುರಂಗ ರಸ್ತೆಗಳ ನಿರ್ಮಾಣ ಅಭಿವೃದ್ಧಿ ಹಾಗೂ ರಾಜಕಾಲುವೆಗಳ ಬಫರ್ ಜೋನ್ ನಲ್ಲಿ ರಸ್ತೆಗಳ ನಿರ್ಮಾಣ ಸೇರಿ ಮೊದಲಾದ ವಿಷಯಗಳ ಕುರಿತು ಅಧಿಕಾರಿಗಳು ಮುಖ್ಯಮಂತ್ರಿ ಮತ್ತು ಉಪ ಮುಖ್ಯಮಂತ್ರಿ ಅವರಿಗೆ ಮಾಹಿತಿ ಒದಗಿಸಿದರು. ಆ ಬಳಿಕೆ ಸಭೆಯಲ್ಲಿ ಚರ್ಚಿಸಲಾಯಿತು.
ಹೊಟ್ಟೆ ಉರಿ ತಾಳಲಾರದೆ ನನ್ನ ಮೇಲೆ ಲಂಚ ಆರೋಪ: ಎಚ್‌ಡಿಕೆಗೆ ಡಿಕೆಶಿ ತಿರುಗೇಟು
ಸಭೆಯಲ್ಲಿ ಸಚಿವರಾದ ರಾಮಲಿಂಗಾ ರೆಡ್ಡಿ, ಕೆ.ಜೆ.ಜಾರ್ಜ್, ಕೃಷ್ಣ ಬೈರೇಗೌಡ, ಬೈರತಿ ಸುರೇಶ್, ದಿನೇಶ್ ಗುಂಡೂರಾವ್, ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿಗಳಾದ ಕೆ.ಗೋವಿಂದರಾಜು, ನಸೀರ್ ಅಹ್ಮದ್, ಬಿಡಿಎ ಅಧ್ಯಕ್ಷ ಎನ್. ಎ.ಹ್ಯಾರಿಸ್, ಜತೆಗೆ, ಸರ್ಕಾರದ ಮುಖ್ಯ ಕಾರ್ಯದರ್ಶಿ ಡಾ. ರಜನೀಶ್ ಗೋಯೆಲ್, ಮುಖ್ಯಮಂತ್ರಿ ಅವರ ಅಪರ ಮುಖ್ಯ ಕಾರ್ಯದರ್ಶಿ ಎಲ್. ಕೆ. ಅತೀಕ್, ಗರಾಭಿವೃದ್ಧಿ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ಎಸ್.ಆರ್. ಉಮಾಶಂಕರ್, ಇಂಧನ ಹಾಗೂ ಮೂಲಸೌಕರ್ಯ ಅಭಿವೃದ್ಧಿ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ಗೌರವ್ ಗುಪ್ತಾ, ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ಸೇರಿದಂತೆ ಮೊದಲಾದವರು ಉಪಸ್ಥಿತರಿದ್ದರು.