ಗೀತಾ ಪಾರಾಯಣ ಕಾರ್ಯಕ್ರಮದಲ್ಲಿ ಭಾಗವಹಿಸಲು ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಶುಕ್ರವಾರ ಆಗಮಿಸಿದ ಪ್ರಧಾನಮಂತ್ರಿ ನರೇಂದ್ರ ಮೋದಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮನವಿ ಪತ್ರ ನೀಡಿದ್ದಾರೆ.

ಮಂಗಳೂರು (ನ.29): ಉಡುಪಿಯಲ್ಲಿ ನಡೆದ ಲಕ್ಷ ಕಂಠ ಗೀತಾ ಪಾರಾಯಣ ಕಾರ್ಯಕ್ರಮದಲ್ಲಿ ಭಾಗವಹಿಸಲು ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಶುಕ್ರವಾರ ಆಗಮಿಸಿದ ಪ್ರಧಾನಮಂತ್ರಿ ನರೇಂದ್ರ ಮೋದಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮನವಿ ಪತ್ರ ನೀಡಿದ್ದಾರೆ.

ಮುಖ್ಯಮಂತ್ರಿಗಳ ಪರವಾಗಿ ಆರೋಗ್ಯ ಮತ್ತು ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಅವರು ಪ್ರಧಾನಿಗೆ ಮನವಿ ಪತ್ರ ನೀಡಿದರು. ಪ್ರಧಾನಿಗೆ ಸಿಎಂ ಸಿದ್ದರಾಮಯ್ಯ ಬರೆದಿರುವ ಪತ್ರ ಇದಾಗಿದ್ದು, ಪತ್ರದಲ್ಲಿ, ರೈತರು ತಾವು ಬೆಳೆದ ಬೆಳೆಗಳಿಗೆ ಬೆಂಬಲ ಬೆಲೆಯಿಲ್ಲದೆ ತೀವ್ರ ಸಂಕಷ್ಟಕ್ಕೆ ಗುರಿಯಾಗಿರುವುದನ್ನು ವಿವರಿಸಲಾಗಿದೆ. ಬೆಂಬಲ ಬೆಲೆಯಂತೆ ಬೆಳೆ ಖರೀದಿ ವ್ಯವಸ್ಥೆ ನಿರ್ಮಿಸುವಲ್ಲಿ ಕೇಂದ್ರ ಸರ್ಕಾರ ಇಚ್ಛಾಶಕ್ತಿ ತೋರಿಸಬೇಕೆಂದು ಮನವಿ ಮಾಡಲಾಗಿದೆ.

ಪತ್ರದಲ್ಲಿ‌ ರಾಜ್ಯದ ರೈತರ ಸಂಕಷ್ಟವನ್ನು ವಿವರಿಸಿರುವ ಸಿಎಂ, ಕರ್ನಾಟಕದಲ್ಲಿ ಮೆಕ್ಕೆಜೋಳ ಮತ್ತು ಹೆಸರು ಕಾಳು , ಬೆಳೆಗಳ ತೀವ್ರ ಬೆಲೆ ಕುಸಿತದಿಂದ ರೈತರು‌ ಬಹಳ ಸಂಕಷ್ಟಕ್ಕೆ ಗುರಿಯಾಗಿದ್ದಾರೆ. ಈ ಸಮಸ್ಯೆಯನ್ನು ನಿಮ್ಮ ಗಮನಕ್ಕೆ ತರುತ್ತಿದ್ದೇವೆ. ಬೆಂಬಲ ಬೆಲೆಯಲ್ಲಿ ರೈತರ ಬೆಳೆಗಳನ್ನು ಖರೀದಿಸುವ ವ್ಯವಸ್ಥೆ ನಿರ್ಮಾಣ ಮಾಡಿ ಎಂದು ಆಗ್ರಹಿಸಿದ್ದಾರೆ.

ಆಘಾತಕಾರಿ ಕುಸಿತ

ಕೇಂದ್ರ ಸರ್ಕಾರ ಮೆಕ್ಕೆಜೋಳಕ್ಕೆ ಪ್ರತಿ ಮೆಟ್ರಿಕ್ ಟನ್‌ಗೆ 2,400 ರು. ಮತ್ತು ಹೆಸರು ಕಾಳಿಗೆ ಪ್ರತಿ ಮೆಟ್ರಿಕ್ ಟನ್‌ಗೆ 8,768 ರು. ರಂತೆ ಎಂಎಸ್‌ಪಿ ಘೋಷಿಸಿದ್ದರೂ, ಕರ್ನಾಟಕದಲ್ಲಿ ಪ್ರಸ್ತುತ ಬೆಲೆಗಳು ಮೆಕ್ಕೆಜೋಳಕ್ಕೆ ಪ್ರತಿ ಮೆಟ್ರಿಕ್ ಟನ್‌ಗೆ 1,600-1,800 ರು. ಮತ್ತು ಹೆಸರು ಕಾಳಿಗೆ ಪ್ರತಿ ಮೆಟ್ರಿಕ್ ಟನ್‌ಗೆ 5,400 ರು. ಆಗಿದ್ದು, ಇದು ತೀವ್ರ ಮತ್ತು ಆಘಾತಕಾರಿ ಕುಸಿತವಾಗಿದೆ. ಕರ್ನಾಟಕದಲ್ಲಿ ಪ್ರಸ್ತುತ ಮಾರಾಟವಾಗಲು ಅಂದಾಜು 32 ಲಕ್ಷ ಮೆಟ್ರಿಕ್ ಟನ್‌‌ಗಳಷ್ಟು ಮೆಕ್ಕೆಜೋಳ ಲಭ್ಯವಿದೆ. ಆದ್ದರಿಂದ ಕೇಂದ್ರ ಸರ್ಕಾರ ತಕ್ಷಣವೇ ಮಧ್ಯಪ್ರವೇಶಿಸಿ, ದರ ನಿಗದಿ ಮಾಡುವಂತೆ ಪತ್ರದಲ್ಲಿ ಮನವಿ ಮಾಡಲಾಗಿದೆ.