ಬಿಜೆಪಿ ಮತ್ತು ಜೆಡಿಎಸ್ ಪಕ್ಷದವರು ರಾಜ್ಯ ಸರ್ಕಾರದ ಅಭಿವೃದ್ಧಿ ಕಾರ್ಯಗಳನ್ನು ಸಹಿಸದೆ ಜನಾಕ್ರೋಶ ಯಾತ್ರೆ ಮಾಡುತ್ತಿದ್ದು ರಾಜ್ಯದ ಜನರು ಇದನ್ನು ಒಪ್ಪುವುದಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.

ಕೆ.ಆರ್.ನಗರ (ಮೇ.24): ಬಿಜೆಪಿ ಮತ್ತು ಜೆಡಿಎಸ್ ಪಕ್ಷದವರು ರಾಜ್ಯ ಸರ್ಕಾರದ ಅಭಿವೃದ್ಧಿ ಕಾರ್ಯಗಳನ್ನು ಸಹಿಸದೆ ಜನಾಕ್ರೋಶ ಯಾತ್ರೆ ಮಾಡುತ್ತಿದ್ದು ರಾಜ್ಯದ ಜನರು ಇದನ್ನು ಒಪ್ಪುವುದಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು. ಪಟ್ಟಣದ ಪುರಸಭೆ ಬಯಲು ರಂಗಮಂದಿರ ಆವರಣದಲ್ಲಿ ಜಿಲ್ಲಾಡಳಿತ ಮತ್ತು ಜಿಲ್ಲಾ ಪಂಚಾಯಿತಿನಿಂದ ಶುಕ್ರವಾರ ಆಯೋಜಿಸಿದ್ದ ಕೆ.ಆರ್.ನಗರ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯ ₹513 ಕೋಟಿ. ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಶಂಕುಸ್ಥಾಪನೆ ಮತ್ತು ಉದ್ಘಾಟನಾ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ರಾಜ್ಯ ಸರ್ಕಾರದ ಬಳಿ ಹಣವಿಲ್ಲದೆ ಅಭಿವೃದ್ಧಿ ಕೆಲಸಗಳು ಕುಂಠಿತಗೊಂಡಿವೆ ಎಂದು ಈ ಎರಡು ಪಕ್ಷಗಳವರು ಬೊಗಳೆ ಬಿಡುತ್ತಿದ್ದಾರೆ, ಆದರೆ ನಾವು ಕಳೆದ ಎರಡು ವರ್ಷದ ಅವಧಿಯಲ್ಲಿ ಪಂಚ ಗ್ಯಾರಂಟಿ ಯೋಜನೆಗಳಿಗೆ 90 ಸಾವಿರ ಕೋಟಿ ರು. ಖರ್ಚು ಮಾಡುವುದರ ಜತೆಗೆ ಇತರೆ ಯೋಜನೆಗಳಿಗೆ 60 ಸಾವಿರ ಕೋಟಿ ರು. ವ್ಯಯಿಸಿದ್ದು, ಹಣ ಇಲ್ಲದಿದ್ದರೆ ಈ ಕೆಲಸಗಳು ಸಾಧ್ಯವಾಗುತ್ತಿತ್ತೆ ಎಂದರು. ನಮ್ಮ ಸರ್ಕಾರ ಅಗತ್ಯ ವಸ್ತುಗಳ ಬೆಲೆ ಏರಿಸಿದೆ ಎಂದು ಅಪಪ್ರಚಾರ ಮಾಡುತ್ತಿರುವ ಬಿಜೆಪಿಯವರು ಕೇಂದ್ರದಲ್ಲಿ ಅಧಿಕಾರದಲ್ಲಿರುವ ಬಿಜೆಪಿ ಸರ್ಕಾರ ಪೆಟ್ರೋಲ್, ಡೀಸೆಲ್, ಅಡುಗೆ ಅನಿಲ, ರಸಗೊಬ್ಬರ, ಔಷಧಿ ಮತ್ತು ಚಿನ್ನಬೆಳ್ಳಿ ಸೇರಿದಂತೆ ಇತರ ವಸ್ತುಗಳ ಬೆಲೆ ಏರಿಕೆ ಮಾಡಿದ್ದರೂ ಏಕೆ ಪ್ರಶ್ನೆ ಮಾಡುತ್ತಿಲ್ಲ ಎಂದು ಕೇಳಿದರು.

ಜಿಎಸ್‌ಟಿ ಸಂಗ್ರಹದಲ್ಲಿ ರಾಜ್ಯ ನಂ.1 ಮಾಡಿ: ಜಿಎಸ್‌ಟಿ ಸಂಗ್ರಹಣೆಯಲ್ಲಿ ಕರ್ನಾಟಕ ರಾಜ್ಯ ಪ್ರಸ್ತುತ ದೇಶದಲ್ಲಿ ದ್ವಿತೀಯ ಸ್ಥಾನದಲ್ಲಿದ್ದು, ಮುಂದಿನ ದಿನಗಳಲ್ಲಿ ಮೊದಲ ಸ್ಥಾನಕ್ಕೆ ತರಲು ಪ್ರಯತ್ನಿಸುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ವಾಣಿಜ್ಯ ತೆರಿಗೆ ಅಧಿಕಾರಿಗಳಿಗೆ ಕರೆ ನೀಡಿದರು. ನಾನು ವಿತ್ತ ಸಚಿವನಾಗಿದ್ದರೂ ತೆರಿಗೆ ಅಧಿಕಾರಿಗಳ ಕಾರ್ಯನಿರ್ವಹಣೆಯಲ್ಲಿ ಅನಗತ್ಯ ಮಧ್ಯಪ್ರವೇಶ ಮಾಡಲು ಬಯಸುವುದಿಲ್ಲ. ಮುಖ್ಯಮಂತ್ರಿ ಆಗಿರುವುದರಿಂದ ಹೆಚ್ಚು ರಿವ್ಯೂ ಮೀಟಿಂಗ್‌ ಮಾಡಲು ಆಗುತ್ತಿಲ್ಲ. ಆದರೆ, ಅಧಿಕಾರಿಗಳು ಇಲಾಖೆಗೆ ನೀಡಿರುವ ತೆರಿಗೆ ಸಂಗ್ರಹ ಗುರಿ ಸಾಧಿಸಲು ಪ್ರಯತ್ನಿಸಬೇಕು. ಬೆಂಗಳೂರಿನಲ್ಲಿ ಹೆಚ್ಚಿನ ಮಟ್ಟದಲ್ಲಿ ತೆರಿಗೆ ಸೋರಿಕೆಯಾಗುತ್ತಿದೆ ಎಂದರು.

ರಾಜ್ಯಾದ್ಯಂತ ತೆರಿಗೆ ಸೋರಿಕೆ ತಡೆಗೆ ಅಧಿಕಾರಿಗಳು ಶಕ್ತಿ ಮೀರಿ ಶ್ರಮಿಸಬೇಕು. ಇದಕ್ಕೆ ಪೂರಕವಾಗಿ ತೆರಿಗೆ ಪಾವತಿ ಪ್ರಕ್ರಿಯೆಯಲ್ಲಿ ಹೆಚ್ಚಿನ ಸುಧಾರಣೆ ತರಲು ಸರ್ಕಾರ ಬದ್ಧವಾಗಿದೆ. ಈಗ ಮಹಾರಾಷ್ಟ್ರ ತೆರಿಗೆ ಸಂಗ್ರಹದಲ್ಲಿ ಮೊದಲ ಸ್ಥಾನದಲ್ಲಿದೆ. ನಾವು ಎರಡನೇ ಸ್ಥಾನದಲ್ಲಿದ್ದೇವೆ. ಮುಂದಿನ ದಿನಗಳಲ್ಲಿ ರಾಜ್ಯವನ್ನು ಮೊದಲ ಸ್ಥಾನಕ್ಕೆ ಕೊಂಡೊಯ್ಯಲು ಅಧಿಕಾರಿಗಳು ಪ್ರಯತ್ನಿಸಬೇಕು. ಪ್ರಯತ್ನಿಸಿದರೆ ನಾವು ಮೊದಲ ಸ್ಥಾನಕ್ಕೆ ಹೋಗುತ್ತೇವೆ ಎಂದು ತಿಳಿಸಿದರು.