ಕನ್ನಡ ಭಾಷೆಗೆ ಕೇವಲ ₹32 ಕೋಟಿ ಮಾತ್ರ ನೀಡಿರುವುದಾಗಿ ಸುಳ್ಳು ಹೇಳಿರುವ ಬಿಜೆಪಿ ರಾಜ್ಯದ ಜನರ ಕ್ಷಮೆ ಯಾಚಿಸಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಆಗ್ರಹಿಸಿದ್ದಾರೆ.
ಬೆಂಗಳೂರು (ಮೇ.28): ರಾಜ್ಯ ಸರ್ಕಾರ ಕನ್ನಡ ಭಾಷೆ ನಿರ್ಲಕ್ಷಿಸಿ ಉರ್ದು ಭಾಷೆಗೆ ಹೆಚ್ಚು ಹಣ ನೀಡಿದೆ ಎಂದು ಸುಳ್ಳು ಹೇಳಿ ಕೋಮು ವೈಷಮ್ಯ ಹುಟ್ಟಿಸಲು ಬಿಜೆಪಿ ಮುಂದಾಗಿದೆ. ಪ್ರಸಕ್ತ ಸಾಲಿನಲ್ಲಿ ಕನ್ನಡ ಭಾಷಾ ಶಾಲೆಗಳಿಗಾಗಿಯೇ ₹38,688 ಕೋಟಿ ನೀಡಿದ್ದೇವೆ. ಕನ್ನಡ ಭಾಷೆಗೆ ಕೇವಲ ₹32 ಕೋಟಿ ಮಾತ್ರ ನೀಡಿರುವುದಾಗಿ ಸುಳ್ಳು ಹೇಳಿರುವ ಬಿಜೆಪಿ ರಾಜ್ಯದ ಜನರ ಕ್ಷಮೆ ಯಾಚಿಸಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಆಗ್ರಹಿಸಿದ್ದಾರೆ. ಜನರನ್ನು ತಪ್ಪು ದಾರಿಗೆಳೆಯುತ್ತಿರುವುದು ಅಕ್ಷಮ್ಯ ಅಪರಾಧ ಮಾತ್ರವಲ್ಲ, ಕನ್ನಡನಾಡು ಮತ್ತು ನುಡಿಗೆ ಬಗೆಯುವ ದ್ರೋಹ.
ಒಂದು ರಾಷ್ಟ್ರೀಯ ಪಕ್ಷ ಇಷ್ಟೊಂದು ಬೇಜವಾಬ್ದಾರಿತನದಿಂದ ಕಿಡಿಗೇಡಿ ಟ್ರೋಲರ್‌ಗಳ ರೀತಿಯಲ್ಲಿ ಸುಳ್ಳು ಹೇಳುತ್ತಿರುವುದು ವಿಷಾದನೀಯ. ಹೀಗಾಗಿ ರಾಜ್ಯ ಬಿಜೆಪಿ ತಕ್ಷಣ ಸ್ಪಷ್ಟೀಕರಣದ ಮೂಲಕ ಸತ್ಯ ಸಂಗತಿ ತಿಳಿಸುವ ಜತೆಗೆ ತಮ್ಮಿಂದ ಆಗಿರುವ ತಪ್ಪಿಗೆ ರಾಜ್ಯದ ಜನತೆಯ ಕ್ಷಮೆ ಕೇಳಬೇಕು ಎಂದಿದ್ದಾರೆ. ಈ ಬಗ್ಗೆ ಪತ್ರಿಕಾ ಹೇಳಿಕೆ ನೀಡಿರುವ ಅವರು, 2025-26ನೇ ಸಾಲಿನಲ್ಲಿ ರಾಜ್ಯ ಸರ್ಕಾರ ಪ್ರಾಥಮಿಕ ಮತ್ತು ಪ್ರೌಡ ಶಿಕ್ಷಣ ಇಲಾಖೆಗೆ ₹34,438 ಕೋಟಿ ಮತ್ತು ಸಮಾಜ ಕಲ್ಯಾಣ ಮತ್ತಿತರ ಇಲಾಖೆಗಳಿಗೆ ಸೇರಿದ ಶಾಲೆಗಳಿಗೆ ₹4,150 ಕೋಟಿ ಹೀಗೆ ಕನ್ನಡ ಭಾಷೆಯ ಶಾಲೆಗಳಿಗಾಗಿಯೇ ಒಟ್ಟು ₹38,688 ಕೋಟಿ ನೀಡಿದೆ.
ಜತೆಗೆ ಸರ್ಕಾರಿ ಶಾಲೆಗಳ ನಿರ್ವಹಣೆ ಮತ್ತು ಮೂಲ ಸೌಕರ್ಯಗಳ ನಿರ್ಮಾಣಕ್ಕಾಗಿ ಒಟ್ಟು ₹999.30 ಕೋಟಿ ಸೇರಿ ಈ ಒಟ್ಟು ಅನುದಾನ ಕನ್ನಡ ಭಾಷೆಯ ಅಭಿವೃದ್ದಿಗಾಗಿಯೇ ವ್ಯಯವಾಗಲಿದೆ. ಹೀಗಿರುವಾಗ ಕನ್ನಡ ಭಾಷೆಗೆ ರಾಜ್ಯ ಸರ್ಕಾರ ಕೇವಲ ₹32 ಕೋಟಿ ನೀಡಿದೆ ಎಂಬ ಅಪಪ್ರಚಾರದ ಉದ್ದೇಶ ರಾಜಕೀಯ ಮಾತ್ರ ಎಂದು ಹೇಳಿದ್ದಾರೆ.
ಗ್ರಾಮಠಾಣಾ ಗಡಿ ಮರುಸಮೀಕ್ಷೆ ನಡೆಸಿ: ಗ್ರಾಮಠಾಣಾ ಗಡಿಯನ್ನು ಬಹಳ ಹಿಂದೆ ನಿಗದಿಪಡಿಸಲಾಗಿದೆ. ಬಳಿಕ ವಿಸ್ತರಣೆಯಾಗಿರುವ ಪ್ರದೇಶವನ್ನು ಗ್ರಾಮಠಾಣಾ ಗಡಿಗೆ ಸೇರಿಸದ ಹಿನ್ನೆಲೆಯಲ್ಲಿ ನಾಗರಿಕರು ಹಲವು ಸಮಸ್ಯೆ ಎದುರಿಸುವಂತಾಗಿದೆ. ಹೀಗಾಗಿ ವಿಸ್ತರಣೆಯಾಗಿರುವ ಪ್ರದೇಶವನ್ನು ಪುನರ್ ಸಮೀಕ್ಷೆ ನಡೆಸಿ ನಿಗದಿ ಮಾಡಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸೂಚನೆ ನೀಡಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಗುರುವಾರ ವಿಧಾನಸೌಧದಲ್ಲಿ ಕರ್ನಾಟಕ ರಾಜ್ಯ ನೀತಿ ಮತ್ತು ಯೋಜನಾ ಆಯೋಗ ಹಾಗೂ ಕರ್ನಾಟಕ ರಾಜ್ಯ ವಿಕೇಂದ್ರೀಕರಣ ಯೋಜನೆ ಮತ್ತು ಅಭಿವೃದ್ಧಿ ಸಮಿತಿಯ ಜಂಟಿ ಸಭೆಯಲ್ಲಿ ಭಾಗವಹಿಸಿ ಮಾತನಾಡಿದರು.
ಗ್ರಾಮಠಾಣಾ ಗಡಿ ಗುರುತಿಸುವಿಕೆ ಬಗ್ಗೆ ಸಮೀಕ್ಷೆಯನ್ನು ಆದಷ್ಟು ಬೇಗ ಪೂರ್ಣಗೊಳಿಸಬೇಕು. ಈ ಸಂಬಂಧ ಅನುಮತಿಗಾಗಿ ಕಂದಾಯ ಇಲಾಖೆ ಮತ್ತು ಪಂಚಾಯತ್ ರಾಜ್ ಇಲಾಖೆ ವತಿಯಿಂದ ಸರ್ಕಾರಕ್ಕೆ ಪ್ರಸ್ತಾವನೆ ಕಳುಹಿಸಿ ಎಂದು ಸೂಚನೆ ನೀಡಿದರು. ಜತೆಗೆ ನಗರ ಹಾಗೂ ಗ್ರಾಮೀಣ ಸ್ಥಳೀಯ ಸಂಸ್ಥೆಗಳಿಗೆ ಮೂಲ ಸೌಕರ್ಯ ಅಭಿವೃದ್ಧಿಗೊಳಿಸಲು ಸರ್ಕಾರಿ ಜಮೀನು ಕೊರತೆ ಉಂಟಾಗುತ್ತಿದೆ. ಭೂಸ್ವಾಧೀನ ಮಾಡಿಕೊಂಡು ಪರಿಹಾರ ನೀಡಿ ಮೂಲ ಸೌಕರ್ಯ ಮಾಡಲು ಹಣಕಾಸು ವೆಚ್ಚ ಹೆಚ್ಚಾಗುತ್ತಿದೆ. ಹೀಗಾಗಿ ಮೂಲ ಸೌಕರ್ಯಗಳಿಗೆ ಅಗತ್ಯವಿರುವ ಭೂಮಿಯನ್ನು ಗುರುತಿಸಿ ಮೀಸಲಿಡಲು ಭೂ ಬ್ಯಾಂಕ್ ಸ್ಥಾಪನೆ ಮಾಡಬೇಕು ಎಂದು ಸೂಚಿಸಿದರು.
