ಖರ್ಗೆ ಕುಟುಂಬದ ಹತ್ಯೆಗೆ ಸಂಚು: ಬಿಜೆಪಿ ಅಭ್ಯರ್ಥಿ ವಿರುದ್ಧ ಕಾಂಗ್ರೆಸ್ ದೂರು
ಇತ್ತೀಚೆಗೆ ಸಾಮಾಜಿಕ ಜಾಲತಾಣಗಳಲ್ಲಿ ಚಿತ್ತಾಪುರ ಬಿಜೆಪಿ ಅಭ್ಯರ್ಥಿ ಬಿಜೆಪಿ ಕಾರ್ಯಕರ್ತರೊಂದಿಗೆ ಮಾತನಾಡುತ್ತಿರುವ ಆಡಿಯೋ ವೈರಲ್ ಆಗಿದೆ. ಅದರಲ್ಲಿ ಮಲ್ಲಿಕಾರ್ಜುನ ಖರ್ಗೆ ಹಾಗೂ ಕುಟುಂಬವನ್ನು ಸಾಫ್ ಮಾಡುತ್ತಿದ್ದೆ ಎಂದು ಮಣಿಕಂಠ ರಾಥೋಡ್ ಹೇಳಿದ್ದಾರೆ. ಈ ಬಗ್ಗೆ ಹೈಗ್ರೌಂಡ್ಸ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರೂ ಈವರೆಗೂ ಕ್ರಮವಾಗಿಲ್ಲ. ಕೂಡಲೇ ಆರೋಪಿಯನ್ನು ಬಂಧಿಸಿ ತನಿಖೆ ನಡೆಸಬೇಕು ಎಂದು ದೂರಿನಲ್ಲಿ ಮನವಿ ಮಾಡಿದ ಕಾಂಗ್ರೆಸ್
ಬೆಂಗಳೂರು(ಮೇ.09): ಎಐಸಿಸಿ ಮಲ್ಲಿಕಾರ್ಜುನ ಖರ್ಗೆ ಹಾಗೂ ಅವರ ಕುಟುಂಬ ಸದಸ್ಯ ಹತ್ಯೆಗೆ ಬಿಜೆಪಿ ಅಧಿಕೃತ ಅಭ್ಯರ್ಥಿ ಕ್ರಿಮಿನಲ್ ಪಿತೂರಿ ನಡೆಸಿದ್ದಾರೆ. ಹೀಗಾಗಿ ಬಿಜೆಪಿ ಅಭ್ಯರ್ಥಿ ಮಣಿಕಂಠ ರಾಥೋಡ್‌ರನ್ನು ಬಂಧಿಸುವಂತೆ ಒತ್ತಾಯಿಸಿ ಕಾಂಗ್ರೆಸ್ ಪಕ್ಷವು ರಾಜ್ಯ ಪೊಲೀಸ್ ಮಹಾ ನಿರ್ದೇಶಕರಿಗೆ ದೂರು ನೀಡಿದೆ. ಈ ಬಗ್ಗೆ ಸೋಮವಾರ ರಾಜ್ಯ ಪೊಲೀಸ್ ಮಹಾನಿರ್ದೇಶಕರನ್ನು ಭೇಟಿ ಮಾಡಿದ ಕೆಪಿಸಿಸಿ ವಕ್ತಾರ ರಮೇಶ್ ಬಾಬು, ಮಲ್ಲಿಕಾರ್ಜುನ ಖರ್ಗೆ ಹತ್ಯೆ ಕುರಿತು ಮಾತನಾಡಿರುವ ಬಿಜೆಪಿ ಅಧಿಕೃತ ಅಭ್ಯರ್ಥಿ ಮಣಿಕಂಠ ರಾಥೋಡ್ ಬಂಧನ ಆಗಬೇಕು. ಜತೆಗೆ ಮಲ್ಲಿಕಾರ್ಜುನ ಖರ್ಗೆ ಹಾಗೂ ಕುಟುಂಬ ಸದಸ್ಯರಿಗೆ ಭದ್ರತೆ ಒದಗಿಸಬೇಕು ಎಂದು ದೂರಿನಲ್ಲಿ ತಿಳಿಸಿದ್ದಾರೆ.
ಇತ್ತೀಚೆಗೆ ಸಾಮಾಜಿಕ ಜಾಲತಾಣಗಳಲ್ಲಿ ಚಿತ್ತಾಪುರ ಬಿಜೆಪಿ ಅಭ್ಯರ್ಥಿ ಬಿಜೆಪಿ ಕಾರ್ಯಕರ್ತರೊಂದಿಗೆ ಮಾತನಾಡುತ್ತಿರುವ ಆಡಿಯೋ ವೈರಲ್ ಆಗಿದೆ. ಅದರಲ್ಲಿ ಮಲ್ಲಿಕಾರ್ಜುನ ಖರ್ಗೆ ಹಾಗೂ ಕುಟುಂಬವನ್ನು ಸಾಫ್ ಮಾಡುತ್ತಿದ್ದೆ ಎಂದು ಮಣಿಕಂಠ ರಾಥೋಡ್ ಹೇಳಿದ್ದಾರೆ. ಈ ಬಗ್ಗೆ ಹೈಗ್ರೌಂಡ್ಸ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರೂ ಈವರೆಗೂ ಕ್ರಮವಾಗಿಲ್ಲ. ಕೂಡಲೇ ಆರೋಪಿಯನ್ನು ಬಂಧಿಸಿ ತನಿಖೆ ನಡೆಸಬೇಕು ಎಂದು ದೂರಿನಲ್ಲಿ ಮನವಿ ಮಾಡಿದ್ದಾರೆ.
ನಾನು ಮಣ್ಣಿನ ಮಗ, ನನ್ನ ಗೌರವ ಉಳಿಸಿ, ಕಾಂಗ್ರೆಸ್‌ಗೆ ಕಣ್ಮುಚ್ಚಿ ಮತ ಹಾಕಿ: ಮಲ್ಲಿಕಾರ್ಜುನ ಖರ್ಗೆ
ಬಳಿಕ ಮಾತನಾಡಿದ ರಮೇಶ್ ಬಾಬು, ಮಲ್ಲಿಕಾರ್ಜುನ ಖರ್ಗೆ ಅವರ ಕುಟುಂಬವನ್ನು ಹತ್ಯೆ ಮಾಡುವುದಾಗಿ ಮಣಿಕಂಠ ರಾಥೋಡ್ ಹೇಳಿದ್ದಾರೆ ಎನ್ನಲಾದ ಆಡಿಯೋ ಎರಡು ದಿನಗಳ ಹಿಂದೆ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿತ್ತು. ಒಂದು ವರ್ಷದ ಹಿಂದೆ ಕೂಡ ರಾಥೋಡ್ ಇದೇ ರೀತಿಯ ಹೇಳಿಕೆ ನೀಡಿದ್ದರು. ಆ ಸಂದರ್ಭದಲ್ಲೂ ಪೊಲೀಸರಿಗೆ ದೂರು ನೀಡಿದ್ದೇವೆ. ಆದರೂ ದುಷ್ಕರ್ಮಿ ವಿರುದ್ಧ ಪೊಲೀಸರು ಯಾವುದೇ ಕ್ರಮ ಕೈಗೊಂಡಿಲ್ಲ. ಹೀಗಾಗಿ ಮತ್ತೆ ದೂರು ಸಲ್ಲಿಸಿದ್ದೇವೆ.
ದೂರು ಸಂಬಂಧ ತನಿಖೆ ನಡೆಸಿ ಕ್ರಮ ಕೈಗೊಳ್ಳಬೇಕು. ಮಣಿಕಂಠ ರಾಥೋಡ್‌ನನ್ನು ಬಂಧಿಸಬೇಕು. ಜತೆಗೆ ಮಲ್ಲಿಕಾರ್ಜುನ ಖರ್ಗೆ ಹಾಗೂ ಕುಟುಂಬ ಸದಸ್ಯರಿಗೆ ಸೂಕ್ತ ಭದ್ರತೆ ಒದಗಿಸಬೇಕು ಎಂದು ಮನವಿ ಮಾಡಿದ್ದೇವೆ ಎಂದು ಮಾಹಿತಿ ನೀಡಿದರು.