ಇದೇ ತಿಂಗಳ 11ರಿಂದ ವಿಧಾನಮಂಡಲದ ಅಧಿವೇಶನ ಆರಂಭವಾಗುವ ಹಿನ್ನೆಲೆಯಲ್ಲಿ ಆಡಳಿತಾರೂಢ ಕಾಂಗ್ರೆಸ್ಸಿನ ವೈಫಲ್ಯಗಳನ್ನು ಮುಂದಿಟ್ಟುಕೊಂಡು ವಿಧಾನಸಭೆಯಲ್ಲಿ ಉಗ್ರ ಹೋರಾಟ ನಡೆಸಲು ಪ್ರಮುಖ ಪ್ರತಿಪಕ್ಷ ಬಿಜೆಪಿ ನಾಯಕರು ನಿರ್ಧರಿಸಿದ್ದಾರೆ.

ಬೆಂಗಳೂರು (ಆ.06): ಇದೇ ತಿಂಗಳ 11ರಿಂದ ವಿಧಾನಮಂಡಲದ ಅಧಿವೇಶನ ಆರಂಭವಾಗುವ ಹಿನ್ನೆಲೆಯಲ್ಲಿ ಆಡಳಿತಾರೂಢ ಕಾಂಗ್ರೆಸ್ಸಿನ ವೈಫಲ್ಯಗಳನ್ನು ಮುಂದಿಟ್ಟುಕೊಂಡು ವಿಧಾನಸಭೆಯಲ್ಲಿ ಉಗ್ರ ಹೋರಾಟ ನಡೆಸಲು ಪ್ರಮುಖ ಪ್ರತಿಪಕ್ಷ ಬಿಜೆಪಿ ನಾಯಕರು ನಿರ್ಧರಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಮಂಗಳವಾರ ವಿಧಾನಸಭೆಯ ಪ್ರತಿಪಕ್ಷದ ನಾಯಕ ಆರ್.ಅಶೋಕ್ ಹಾಗೂ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ನೇತೃತ್ವದಲ್ಲಿ ಹಿರಿಯ ಶಾಸಕರು ಸಭೆ ಸೇರಿ ಪೂರ್ವಭಾವಿ ಚರ್ಚೆ ನಡೆಸಿದರು.

ಇದೇ ವೇಳೆ ಅಧಿವೇಶನದ ಹಿಂದಿನ ದಿನವಾದ 10ರಂದು ಸಂಜೆ ಜೆಡಿಎಸ್ ನಾಯಕರನ್ನೂ ಒಳಗೊಂಡಂತೆ ಉಭಯ ಪಕ್ಷಗಳ ಹಿರಿಯ ನಾಯಕರ ಸಮನ್ವಯ ಸಮಿತಿ ಸಭೆ ನಡೆಸಿ ಜಂಟಿ ಹೋರಾಟದ ರೂಪುರೇಷೆ ಸಿದ್ಧಪಡಿಸಲು ತೀರ್ಮಾನಿಸಲಾಗಿದೆ. ಸಭೆಯ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅಶೋಕ್‌, ಅಧಿವೇಶನದಲ್ಲಿ ಕಾಂಗ್ರೆಸ್‌ ಸರ್ಕಾರದ ದುರಾಡಳಿತ, ಖಜಾನೆ ಖಾಲಿಯಾಗಿರುವುದು, ನೌಕರರಿಗೆ ವೇತನ ನೀಡಲು ಸಾಧ್ಯವಾಗದ ಪರಿಸ್ಥಿತಿ, ಸಾರಿಗೆ ನೌಕರರು ಮುಷ್ಕರ ನಡೆಸುತ್ತಿರುವುದು, ಅಭಿವೃದ್ಧಿ ಕಾರ್ಯಗಳಿಗೆ ಹಿನ್ನಡೆ ಆಗಿರುವ ಬಗ್ಗೆ ಪ್ರಸ್ತಾಪಿಸಲಾಗುವುದು ಎಂದು ಹೇಳಿದರು.

ಆರ್‌ಸಿಬಿ ವಿಜಯೋತ್ಸವ ವೇಳೆ 11 ಮಂದಿ ಕಾಲ್ತುಳಿತದಲ್ಲಿ ಸಾವಿಗೀಡಾಗಿರುವ ಬಗ್ಗೆಯೂ ಪ್ರಮುಖವಾಗಿ ಪ್ರಸ್ತಾಪಿಸುತ್ತೇವೆ. ಜತೆಗೆ ರಸಗೊಬ್ಬರ ಸಮಸ್ಯೆ, ಬೆಳೆಹಾನಿ ಆಗಿರುವುದು, ಸಚಿವರು ಜಿಲ್ಲೆಗಳಿಗೆ ಭೇಟಿ ನೀಡದಿರುವುದು, ಬೆಂಗಳೂರಿಗೆ ಅನುದಾನ ನೀಡದೇ ಇರುವುದು, ಡ್ರಗ್ಸ್ ಮಾಫಿಯಾ ಕುರಿತು ಅಧಿವೇಶನದಲ್ಲಿ ಪ್ರಸ್ತಾಪಿಸಿ ಸರ್ಕಾರವನ್ನು ತರಾಟೆಗೆ ತೆಗೆದುಕೊಳ್ಳಲಾಗುವುದು ಎಂದು ತಿಳಿಸಿದರು. ಪ್ರಶ್ನೆಯೊಂದಕ್ಕೆ ಉತ್ತರಿಸಿದ ಅಶೋಕ್, ಈ ತಿಂಗಳ 10ರಂದು ಸಂಜೆ 5ಗಂಟೆಗೆ ಬಿಜೆಪಿ ಮತ್ತು ಜೆಡಿಎಸ್‌ ನಾಯಕರನ್ನು ಒಳಗೊಂಡ ಸಮನ್ವಯ ಸಭೆ ನಡೆಯಲಿದೆ. ಅಧಿವೇಶನದಲ್ಲಿ ಜಂಟಿ ಹೋರಾಟದ ಬಗ್ಗೆ ಚರ್ಚಿಸಲಾಗುವುದು ಎಂದರು.

ಸರ್ಕಾರಕ್ಕೆ ಒಳ್ಳೆಯದಾಗಲ್ಲ: ಕೇಂದ್ರ ಸರ್ಕಾರ ರಾಜ್ಯಕ್ಕೆ ನೀಡಿರುವ ರಸಗೊಬ್ಬರ ರೈತರಿಗೆ ಹಂಚಿಕೆ ಮಾಡದೆ ದಲ್ಲಾಳಿಗಳ ಮೂಲಕ ಕಾಳಸಂತೆಯಲ್ಲಿ ಮಾರಾಟ ಮಾಡಲಾಗಿದೆ. ಗೊಬ್ಬರಕ್ಕಾಗಿ ದಿನಬೆಳಗ್ಗೆ ಸಾಲುಗಟ್ಟಿ ನಿಲ್ಲುವಂತಹ ಪರಿಸ್ಥಿತಿ ನಿರ್ಮಾಣ ಮಾಡಿರುವ ರಾಜ್ಯ ಕಾಂಗ್ರೆಸ್ ಸರ್ಕಾರ ರೈತರನ್ನು ಬೀದಿಪಾಲು ಮಾಡಿದೆ. ರೈತರ ಕಣ್ಣಲ್ಲಿ ನೀರು ತರಿಸುವ ಯಾವುದೇ ಸರ್ಕಾರಕ್ಕೆ ಒಳ್ಳೆಯದಾಗುವುದಿಲ್ಲ ಎಂದು ರಾಜ್ಯ ಬಿಜೆಪಿ ಅಧ್ಯಕ್ಷ ಬಿ.ವೈ.ವಿಜಯೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದರು.

ಬಿಜೆಪಿ ರೈತ ಮೋರ್ಚಾ ನೇತೃತ್ವದ ಪ್ರತಿಭಟನೆ ಅಂಗವಾಗಿ ನಗರದ ಬಿಜಿಎಸ್ ವೃತ್ತದಲ್ಲಿ ಅಂಬೇಡ್ಕರ್ ಪುತ್ಥಳಿಗೆ ಮಾಲಾರ್ಪಣೆ ಮಾಡಿ ಜಿಲ್ಲಾಧಿಕಾರಿ ಕಚೇರಿವರೆಗೆ ನಡೆದ ಬೃಹತ್ ಪ್ರತಿಭಟನಾ ಮೆರವಣಿಗೆಯಲ್ಲಿ ಪಾಲ್ಗೊಂಡರು. ಜಿಲ್ಲಾಧಿಕಾರಿ ಕಚೇರಿ ಬಳಿ ಮಾತನಾಡಿದ ವಿಜಯೇಂದ್ರ, ಈ ಬಾರಿ ಮುಂಗಾರು ಉತ್ತಮವಾಗಿದೆ ಎಂದು ಹವಾಮಾನ ಇಲಾಖೆ ಮೂರು ತಿಂಗಳ ಮೊದಲೇ ಮುನ್ಸೂಚನೆ ನೀಡಿದೆ. ರೈತರಿಗೆ ಗೊಬ್ಬರದ ಬೇಡಿಕೆ ಹೆಚ್ಚಾಗುತ್ತದೆ ಎಂದು ಪೂರಕ ಪೂರ್ವ ಸಿದ್ಧತೆ ಮಾಡಿಕೊಂಡು ಗೊಬ್ಬರ ದಾಸ್ತಾನು ಮಾಡದೆ ರಾಜ್ಯ ಸರ್ಕಾರ ರೈತರಿಗೆ ಅನ್ಯಾಯ ಮಾಡಿ ಅವರು ಕಣ್ಣೀರಿನಲ್ಲಿ ಕೈತೊಳೆಯುವ ಪರಿಸ್ಥಿತಿಗೆ ತಂದಿದೆ ಎಂದರು.