ಗದಗ, (ಆ.09): ಸರ್ಕಾರಿ ಆಸ್ಪತ್ರೆ ಎಂದರೆ ಮೂಗು ಮುರಿಯುವವರೇ ಹೆಚ್ಚು. ಅದರಲ್ಲೂ ಕೊರೋನಾ ಬಂದ್ಮೇಲಂತೂ ಸರ್ಕಾರಿ ಆಸ್ಪತ್ರೆಗಳ ಬಗ್ಗೆ ಒಂದಿಲ್ಲೊಂದು ಭಯಾನಕ ವರದಿಗಳು ಬರುತ್ತಲೇ ಇವೆ. 

ಆದರೆ. ಇಲ್ಲೆದರ ನಡುವೆ ಗದಗ ಜಿಲ್ಲಾಧಿಕಾರಿ ಸುಂದರೇಶ್ ಅವರು  ತಮ್ಮ ಪತ್ನಿಯನ್ನು ಸರ್ಕಾರಿ ಆಸ್ಪತ್ರೆಯಲ್ಲಿ ಹೆರಿಗೆ ಮಾಡಿಸುವ ಮೂಲಕ  ಸರಳತೆ ಮೆರೆದಿದ್ದಾರೆ. ಅಲ್ಲದೇ ಇತರರಿಗೂ ಮಾದರಿಯಾಗಿದ್ದಾರೆ.

ನಾರ್ಮಲ್ ಹೆರಿಗೆಗೆ ಫೇಮಸ್‌ ಇಲ್ಲಿನ ಸರ್ಕಾರಿ ಆಸ್ಪತ್ರೆ..!

ಗದಗದ ಕೆಸಿ ರಾಣಿ ರಸ್ತೆಯ ದುಂಡಪ್ಪ, ಮಾನ್ವಿ ಸರ್ಕಾರಿ ಮಹಿಳಾ ಮತ್ತು ಮಕ್ಕಳ ಆಸ್ಪತ್ರೆಯಲ್ಲಿ ಇಂದು (ಭಾನುವಾರ) ಬೆಳಗ್ಗೆ ಶಸ್ತ್ರಚಿಕಿತ್ಸೆ ಮೂಲಕ ಇವರ ಪತ್ನಿಯ ಹೆರಿಗೆ ಮಾಡಲಾಗಿದ್ದು, ಅವರು ಗಂಡು ಮಗುವಿಗೆ ಜನ್ಮ ನೀಡಿದ್ದಾರೆ. ತಾಯಿ-ಮಗು ಆರೋಗ್ಯವಾಗಿದ್ದಾರೆ ಎಂದು ಆಸ್ಪತ್ರೆಯ ವೈದ್ಯರು ಹೇಳಿದ್ದಾರೆ.

ಕೊರೋನಾ ವೈರಸ್ ಭೀತಿಯಿಂದ ಸರ್ಕಾರಿ ಆಸ್ಪತ್ರೆಗೆ ಹೋಗಲು ಭಯ ಪಡುವ ಈ ದಿನಗಳಲ್ಲಿಯೂ ಜಿಲ್ಲಾಧಿಕಾರಿಯವರು ಸರ್ಕಾರಿ ಆಸ್ಪತ್ರೆಯನ್ನೇ ಆಯ್ಕೆ ಮಾಡಿಕೊಂಡಿರುವುದಕ್ಕೆ ಭಾರಿ ಮೆಚ್ಚುಗೆ ವ್ಯಕ್ತವಾಗಿದೆ.

ಇನ್ನು ಈ ಬಗ್ಗೆ ಕಾಂಗ್ರೆಸ್ ಹಿರಿಯ ನಾಯಕ ಎಚ್‌ಕೆ ಪಾಟೀಲ್ ಟ್ವೀಟ್ ಮೂಲಕ ಪ್ರತಿಕ್ರಿಯಿಸಿ ಜಿಲ್ಲಾಧಿಕಾರಿಗಳ ನಡೆಗೆ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.