ರಾಘವೇಂದ್ರ ಪರ ಶಾಮನೂರು ಹೇಳಿಕೆಗೆ ಕಾಂಗ್ರೆಸ್ಸಿಗರು ಗರಂ
ಶಾಮನೂರು ಶಿವಶಂಕರಪ್ಪ ಹೇಳಿಕೆ ವಿಚಾರ ನನಗೆ ಗೊತ್ತಿಲ್ಲ. ಆದರೆ, ಈ ಬಾರಿ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಹೆಚ್ಚಿನ ಕ್ಷೇತ್ರಗಳಲ್ಲಿ ಗೆಲುವು ಸಾಧಿಸಲಿದೆ. ಅದರಲ್ಲೂ ಶಿವಮೊಗ್ಗದಲ್ಲಿ ಈ ಬಾರಿ ಕಾಂಗ್ರೆಸ್ ಅಭ್ಯರ್ಥಿಯೇ ಗೆಲುವು ಸಾಧಿಸಲಿದ್ದಾರೆ ಎಂದು ಹೇಳಿದ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್
ಬೆಂಗಳೂರು(ಜ.28): ಬಿ.ವೈ. ರಾಘವೇಂದ್ರ ಅವರು ಮುಂದಿನ ಲೋಕಸಭಾ ಚುನಾವಣೆಯಲ್ಲಿ ಗೆಲ್ಲಲಿದ್ದಾರೆ ಎಂಬ ಕಾಂಗ್ರೆಸ್ ಶಾಸಕ ಶಾಮನೂರು ಶಿವಶಂಕರಪ್ಪ ಹೇಳಿಕೆಗೆ ಕಾಂಗ್ರೆಸ್ ಮುಖಂಡರು ಆಕ್ಷೇಪ ವ್ಯಕ್ತಪಡಿಸುತ್ತಿದ್ದು, ಯಾರು ಏನೇ ಹೇಳಿದರೂ ಶಿವಮೊಗ್ಗದಲ್ಲಿ ಕಾಂಗ್ರೆಸ್ ಗೆಲ್ಲಲಿದೆ ಎಂದು ಟಾಂಗ್ ನೀಡಿದ್ದಾರೆ.
ಶಿವಮೊಗ್ಗದಲ್ಲಿ ಶುಕ್ರವಾರ ನಡೆದ ಕಾಠ್ಯಕ್ರಮದಲ್ಲಿ ಕಾಂಗ್ರೆಸ್ ನ ಹಿರಿಯ ಶಾಸಕ ಶಾಮನೂರು ಶಿವಶಂಕರಪ್ಪ ಅವರು, ಬಿ.ವೈ. ರಾಘವೇಂದ್ರ ಅವರನ್ನು ಹೊಗಳಿದ್ದರು. ಅಲ್ಲದೆ, ಅವರು ಮಾಡಿದ ಕೆಲಸದಿಂದಾಗಿ ಮುಂದಿನ ಚುನಾವಣೆಯಲ್ಲೂ ಅವರೇ ಗೆಲ್ಲಲಿದ್ದಾರೆ ಎಂದೂ ಭವಿಷ್ಯ ನುಡಿದಿದ್ದರು.
ಈ ಹೇಳಿಕೆಗೆ ಕಾಂಗ್ರೆಸ್‌ನಲ್ಲಿ ಭಾರೀ ವಿರೋಧ ವ್ಯಕ್ತವಾಗುತ್ತಿದ್ದು, ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಸುದ್ದಿಗಾರರೊಂದಿಗೆ ಮಾತನಾಡಿ, ಶಾಮನೂರು ಶಿವಶಂಕರಪ್ಪ ಹೇಳಿಕೆ ವಿಚಾರ ನನಗೆ ಗೊತ್ತಿಲ್ಲ. ಆದರೆ, ಈ ಬಾರಿ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಹೆಚ್ಚಿನ ಕ್ಷೇತ್ರಗಳಲ್ಲಿ ಗೆಲುವು ಸಾಧಿಸಲಿದೆ. ಅದರಲ್ಲೂ ಶಿವಮೊಗ್ಗದಲ್ಲಿ ಈ ಬಾರಿ ಕಾಂಗ್ರೆಸ್ ಅಭ್ಯರ್ಥಿಯೇ ಗೆಲುವು ಸಾಧಿಸಲಿದ್ದಾರೆ ಎಂದು ಹೇಳಿದರು.
ಸಚಿವ ಪ್ರಿಯಾಂಕ್ ಖರ್ಗೆ ಪ್ರತಿಕ್ರಿಯಿಸಿ, ಶಾಮನೂರು ಶಿವಶಂಕರಪ್ಪ ಅವರು ಪಕ್ಷದ ವೇದಿಕೆಯಲ್ಲಿ ಆ ರೀತಿಯ ಹೇಳಿಕೆ ನೀಡಿಲ್ಲ. ಅವರ ಹೇಳಿಕೆ ಬಗ್ಗೆ ಸರಿಯಾದ ಮಾಹಿತಿಯಿಲ್ಲ. ಆದರೂ, ಎಲ್ಲರೂ ಪಕ್ಷದ ಚೌಕಟ್ಟಿನಲ್ಲಿಯೇ ಇರಬೇಕು ಎಂದು ತಿಳಿಸಿದ್ದಾರೆ.