ರಾಜ್ಯದಲ್ಲಿ ಆಡಳಿತವಿರುವ ಕಾಂಗ್ರೆಸ್ ಸರ್ಕಾರ ಪಂಚ ಗ್ಯಾರಂಟಿ ಯೋಜನೆಗಳ ಮೂಲಕ ಬಡವರ ಕಣ್ಣೀರೊರೆಸುವ ಕೆಲಸ ಮಾಡುತ್ತಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದಾರೆ.
ಮೂಲ್ಕಿ (ಡಿ.04): ರಾಜ್ಯದಲ್ಲಿ ಆಡಳಿತವಿರುವ ಕಾಂಗ್ರೆಸ್ ಸರ್ಕಾರ ಪಂಚ ಗ್ಯಾರಂಟಿ ಯೋಜನೆಗಳ ಮೂಲಕ ಬಡವರ ಕಣ್ಣೀರೊರೆಸುವ ಕೆಲಸ ಮಾಡುತ್ತಿದೆ. ಕಾರ್ಯಕರ್ತರು ಪ್ರಾಮಾಣಿಕವಾಗಿ ಕರ್ತವ್ಯ ನಿರ್ವಹಿಸಿ ಪ್ರತಿ ಮನೆ ಮನೆಗೆ ಭೇಟಿ ನೀಡಿ ಸರ್ಕಾರದ ಸಾಧನೆಗಳನ್ನು ತಿಳಿಸಿ, ಈ ಬಾರಿ ಕಿನ್ನಿಗೋಳಿ ಪಟ್ಟಣ ಪಂಚಾಯಿತಿಯಲ್ಲಿ ಕಾಂಗ್ರೆಸ್ ಪಕ್ಷ ಆಡಳಿತಕ್ಕೆ ತರಲು ಶ್ರಮಿಸಬೇಕೆಂದು ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದಾರೆ. ಡಿ.21ರಂದು ನಡೆಯಲಿರುವ ಕಿನ್ನಿಗೋಳಿ ಪಟ್ಟಣ ಪಂಚಾಯಿತಿ ಚುನಾವಣೆಗೆ ಪೂರ್ವಭಾವಿಯಾಗಿ ಕಿನ್ನಿಗೋಳಿಯ ರಾಜರತ್ನಪುರ ಶ್ರೀ ಅಣ್ಣಯ್ಯ ಆಚಾರ್ಯ ಸಭಾಭವನದಲ್ಲಿ ನಡೆದ ಕಿನ್ನಿಗೋಳಿ ಪಟ್ಟಣ ಪಂಚಾಯಿತಿ ವ್ಯಾಪ್ತಿಯ 18 ವಾರ್ಡಿನ ಕಾರ್ಯಕರ್ತರ ಸಭೆಯಲ್ಲಿ ಅವರು ಮಾತನಾಡಿದರು.
ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಮಿಥುನ್ ಎಂ ರೈ ಮಾತನಾಡಿ, ಕಿನ್ನಿಗೋಳಿ ಪಟ್ಟಣ ಪಂಚಾಯಿತಿಯಲ್ಲಿ ಕಾಂಗ್ರೆಸ್ ಆಡಳಿತಕ್ಕೆ ಬಂದರೆ ನಾಗರಿಕರಿಗೆ ಮೂಲಭೂತ ಸೌಕರ್ಯಗಳ ಜೊತೆಗೆ ಸಮಸ್ಯೆ ನಿವಾರಣೆಗೆ ಆದ್ಯತೆ ನೀಡುವುದಾಗಿ ಹೇಳಿದರು. ಕಿನ್ನಿಗೋಳಿ, ಕಟೀಲು, ಹಳೆಯಂಗಡಿ ಪರಿಸರದ ಬಿಜೆಪಿ ಕಾರ್ಯಕರ್ತರು ಜಿಲ್ಲಾ ಉಸ್ತುವಾರಿ ಸಚಿವರ ಸಮ್ಮುಖದಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾದರು.
ದ.ಕ. ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹರೀಶ್ ಕುಮಾರ್, ಕಾಂಗ್ರೆಸ್ ನಾಯಕರಾದ ಶಾಲೆಟ್ ಪಿಂಟೋ, ನವೀನ್ ಚಂದ್ರ ಆಳ್ವ,ಗಿರೀಶ್ ಆಳ್ವ, ಅನಿಲ್ ಕುಮಾರ್, ಪ್ರಮೋದ್ ಕುಮಾರ್ ಕಿನ್ನಿಗೋಳಿ, ಮೂಲ್ಕಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಮೋಹನ್ ಕೋಟ್ಯಾನ್, ಕೆಪಿಸಿಸಿ ಸದಸ್ಯ ಎಚ್ ವಸಂತ ಬರ್ನಾಡ್, ಮಹಿಳಾ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷೆ ವಿಲ್ಮಾ ಡಿಸೋಜಾ,ಟಿ ಎಚ್ ಮಯ್ಯದ್ದಿ ಕಿನ್ನಿಗೋಳಿ, ಬ್ಲಾಕ್ ಕಾಂಗ್ರೆಸ್ ಸಮಿತಿಯ ಪ್ರಧಾನ ಕಾರ್ಯದರ್ಶಿ ಮಂಜುನಾಥ ಕಂಬಾರ ಮತ್ತಿತರರು ಉಪಸ್ಥಿತರಿದ್ದರು. ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಮಿಥುನ್ ರೈ ಸ್ವಾಗತಿಸಿದರು. ಪ್ರಕಾಶ್ ಕಿನ್ನಿಗೋಳಿ ನಿರೂಪಿಸಿದರು.
6ನೇ ಗ್ಯಾರಂಟಿ ‘ಗೃಹ ಆರೋಗ್ಯ’
ಗ್ರಾಮೀಣ ಭಾಗದ 30 ವರ್ಷ ಮೇಲ್ಪಟ್ಟವರ ಆರೋಗ್ಯ ತಪಾಸಣೆ ನಡೆಸಿ ಉಚಿತ ಔಷಧಿ ವಿತರಿಸುವ ‘ಗೃಹ ಆರೋಗ್ಯ’ ಯೋಜನೆ ಯಶಸ್ವಿಯಾಗಿ ಅನುಷ್ಠಾನಗೊಳ್ಳುತ್ತಿದ್ದು, ರಾಜ್ಯಾದ್ಯಂತ ರಕ್ತದೊತ್ತಡ, ಮಧುಮೇಹಕ್ಕೆ 5 ಲಕ್ಷಕ್ಕೂ ಹೆಚ್ಚು ಜನ ಉಚಿತ ಔಷಧ ಪಡೆಯುತ್ತಿದ್ದಾರೆ. ಆ ಮೂಲಕ ಹೃದಯಾಘಾತ, ಕಿಡ್ನಿ ವೈಫಲ್ಯ, ಸ್ಟ್ರೋಕ್‌ನಂತಹ ಜೀವಕ್ಕೆ ಅಪಾಯಕಾರಿಯಾದ ಕಾಯಿಲೆಗಳಿಗೆ ಮೂಲದಲ್ಲೇ ಚಿಕಿತ್ಸೆ ಪಡೆಯುತ್ತಿದ್ದು, ‘ಗೃಹ ಆರೋಗ್ಯ’ ರಾಜ್ಯ ಸರ್ಕಾರದ ಆರನೇ ಗ್ಯಾರಂಟಿಯಾಗಿ ಬದಲಾಗಿದೆ ಎಂದು ಆರೋಗ್ಯ ಇಲಾಖೆ ಅಧಿಕಾರಿಗಳು ತಿಳಿಸಿದ್ದಾರೆ. ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಅವರ ದೂರದೃಷ್ಟಿಯಿಂದ ‘ಗೃಹ ಆರೋಗ್ಯ’ ಯೋಜನೆಗೆ ಕೋಲಾರದಲ್ಲಿ ಪ್ರಾಯೋಗಿಕವಾಗಿ ಚಾಲನೆ ನೀಡಲಾಯಿತು. ಬಳಿಕ ರಾಜ್ಯಾದ್ಯಂತ ವಿಸ್ತರಿಸಿದ ಸಚಿವ ದಿನೇಶ್ ಗುಂಡೂರಾವ್ ಅವರು ಯೋಜನೆಗೆ ಸ್ವಲ್ಪ ಬದಲಾವಣೆ ತಂದಿದ್ದರು. ರಕ್ತದೊತ್ತಡ, ಡಯಾಬಿಟಿಸ್ ಜೊತೆಗೆ ಕ್ಯಾನ್ಸರ್, ಮಾನಸಿಕ ಕಾಯಿಲೆಗಳು, ಸೇರಿದಂತೆ 14 ಬಗೆಯ ಕಾಯಿಲೆಗಳ ತಪಾಸಣೆ ನಡೆಸಲು ಸೂಚಿಸಿದ್ದರು.

