ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಕೋಲಾರ ಜಿಲ್ಲೆಯಿಂದ ಸ್ಪರ್ಧೆ ಮಾಡುವಂತೆ ಕಾಂಗ್ರೆಸ್ ನಾಯಕರು ಒತ್ತಾಯಿಸಿದ್ದಾರೆ.

ಕೋಲಾರ, (ಮಾ.28): ಜಿಲ್ಲೆಯ ಹಿತದೃಷ್ಟಿಯಿಂದ ಸಿದ್ದರಾಮಯ್ಯ ಅವರನ್ನು ಮುಂದಿನ ಚುನಾವಣೆಯಲ್ಲಿ ಕೋಲಾರದಿಂದ ಸ್ಪರ್ಧೆ ಮಾಡಲು ಒತ್ತಾಯಿಸಿದ್ದೇವೆ ಎಂದು ಬಂಗಾರಪೇಟೆ ಶಾಸಕ ಎಸ್​.ಎನ್​.ನಾರಾಯಣಸ್ವಾಮಿ ಹೇಳಿದರು. 

ಇಂದು (ಭಾನುವಾರ) ಸಿದ್ದರಾಮಯ್ಯ ಅವರು ಕೋಲಾರ ಜಿಲ್ಲೆಗೆ ಭೇಟಿ ನೀಡಿದರು. ಈ ವೇಳೆ ಮಾತನಾಡಿದ ನಾರಾಯಣಸ್ವಾಮಿ, ಕೋಲಾರ ಜಿಲ್ಲೆಯಿಂದ ಸ್ಪರ್ಧಿಸುವಂತೆ ಶಾಸಕ ರಮೇಶ್ ಕುಮಾರ್,ಎಂಎಲ್​ಸಿ ನಜೀರ್ ಅಹ್ಮದ್, ಮಾಲೂರು ಶಾಸಕ ನಂಜೇಗೌಡ ಎಲ್ಲರೂ ಕೂಡಿ ಮನವಿ ಮಾಡಿದ್ದೇವೆ. ವಿಪಕ್ಷ ನಾಯಕ ಸಿದ್ದರಾಮಯ್ಯ ಕೋಲಾರ ಜಿಲ್ಲೆಗೆ ಕೆ.ಸಿ.ವ್ಯಾಲಿ ನೀರಾವರಿ ಯೋಜನೆ ಒದಗಿಸಿದ್ದಾರೆ. ಹೀಗಾಗಿ, ಮುಂದಿನ ಚುನಾವಣೆಯಲ್ಲಿ ಸಿದ್ದರಾಮಯ್ಯ ಕೋಲಾರದಿಂದ ಸ್ಪರ್ಧಿಸಬೇಕು ಎಂದು ನಾವೆಲ್ಲರೂ ಕೂಡಿ ಒತ್ತಾಯಿಸಿದ್ದೇವೆ ಎಂದರು.

'ಈ ಬಾರಿ ಸಿದ್ದರಾಮಯ್ಯ ಸೋಲು ಖಚಿತ'

ಆದ್ರೆ, ಈಗಾಗಲೇ ಸಿದ್ದರಾಮಯ್ಯ ಅವರು ಮುಂದಿನ ಚುನಾವಣೆಯಲ್ಲಿ ಬಾದಾಮಿಯಿಂದ ಸ್ಪರ್ಧೆ ಮಾಡುತ್ತೇನೆಂದು ಘೋಷಣೆ ಮಾಡಿದ್ದಾರೆ. ಇದೀಗ ಕೆಲ ಶಾಸಕರು ಸಿದ್ದರಾಮಯ್ಯನವರಿಗೆ ಕ್ಷೇತ್ರ ತ್ಯಾಗ ಮಾಡಿಕೊಡಲು ಮುಂದಾಗಿದ್ದಾರೆ. ಜಮೀರ್ ಅಹಮ್ಮದ್ ಖಾನ್ ತಮ್ಮ ಬೆಂಗಳೂರಿನ ಚಾಮರಾಜಪೇಟೆ ತ್ಯಾಗಕ್ಕೆ ಸಿದ್ಧರಾಗಿದ್ದಾರೆ. ಇದೀಗ ನಾರಾಯಣಸ್ವಾಮಿ ಅವರು ಕೋಲಾರಕ್ಕೆ ಆಹ್ವಾನ ಕೊಟ್ಟಿದ್ದಾರೆ.

ಆದ್ರೆ, ಸಿದ್ದರಾಮಯ್ಯ ಅವರು ಬಾದಾಮಿಯಲ್ಲಿ ಸ್ಪರ್ಧೆ ಮಾಡುವುದಾಗಿ ಈ ಹಿಂದೆ ಹೇಳಿದ್ದಾರೆ. ಆದ್ರೆ, ಚುನಾವಣೆ ಸಂದರ್ಭದಲ್ಲಿ ಯಾವ ಕ್ಷೇತ್ರದಿಂದ ಸ್ಪರ್ಧೆ ಮಾಡುತ್ತಾರೋ ಎನ್ನುವುದನ್ನು ಕಾದುನೋಡಬೇಕಿದೆ.