ನಾವು ಯಾರ ಕತ್ತನ್ನೂ ಕೊಯ್ದಿಲ್ಲ. ಕಾಂಗ್ರೆಸ್ ದೇವೇಗೌಡರನ್ನು ಪ್ರಧಾನಮಂತ್ರಿ ಮಾಡಿದ ಕಾರಣಕ್ಕೆ ಇಡೀ ದೇಶ ಅವರನ್ನು ನೆನೆಸಿಕೊಳ್ಳುವುದು. ಜೆಡಿಎಸ್‌ನವರನ್ನು ಈ ದೇಶ ಗುರುತಿಸುವಂತಹ ಕೆಲಸಗಳನ್ನು ಮಾಡಿರುವುದು ನಮ್ಮ (ಕಾಂಗ್ರೆಸ್) ಪಕ್ಷ. ಕಾಂಗ್ರೆಸ್ ಪ್ರಧಾನಿ ಮಾಡದೇ ಹೋಗಿದ್ದರೆ ಅವರನ್ನು ಈ ದೇಶ ನೆನಪಿಸಿಕೊಳ್ಳುತ್ತಿರಲಿಲ್ಲ. ಕುಮಾರಸ್ವಾಮಿ ಮುಖ್ಯಮಂತ್ರಿಯೂ ಆಗುತ್ತಿರಲಿಲ್ಲ ಎಂದು ಹೇಳಿದ ಸಂಸದ ಡಿ.ಕೆ. ಸುರೇಶ್
ಬೆಂಗಳೂರು(ಮಾ.21): ‘ಜೆಡಿಎಸ್‌ನವರನ್ನು ಈ ದೇಶದ ಪ್ರಧಾನಿ, ರಾಜ್ಯದ ಮುಖ್ಯಮಂತ್ರಿ ಮಾಡಿದ್ದೇವೆ. ಈ ದೇಶ ಗುರುತಿಸಿರುವಂತಹ ಕೆಲಸಗಳನ್ನು ಕಾಂಗ್ರೆಸ್ ಪಕ್ಷ ಮಾಡಿದೆ. ಕಾಂಗ್ರೆಸ್ ಪಕ್ಷವು ದೇವೇಗೌಡರನ್ನು ಪ್ರಧಾನಿ ಮಾಡದೇ ಹೋಗಿದ್ದರೆ ಅವರನ್ನು ಈ ದೇಶ ನೆನಪಿಸಿಕೊಳ್ಳುತ್ತಿರಲಿಲ್ಲ. ರಾಜ್ಯದ ಮೂವತ್ತು ಮುಖ್ಯಮಂತ್ರಿಗಳಲ್ಲಿ ಕುಮಾರಸ್ವಾಮಿ ಅವರು ಒಬ್ಬರಾಗುತ್ತಿರಲಿಲ್ಲ’ ಎಂದು ಎಚ್.ಡಿ. ಕುಮಾರಸ್ವಾಮಿ ಅವರಿಗೆ ಸಂಸದ ಡಿ.ಕೆ. ಸುರೇಶ್ ತಿರುಗೇಟು ನೀಡಿದ್ದಾರೆ.
ಕಾಂಗ್ರೆಸ್ಸಿನಂತೆ ಬಿಜೆಪಿಯವರು ಕುತ್ತಿಗೆ ಕುಯ್ಯುವ ಕೆಲಸ ಮಾಡಿಲ್ಲ ಎಂಬ ಕುಮಾರಸ್ವಾಮಿ ಹೇಳಿಕೆಗೆ ಪ್ರತಿಕ್ರಿಯಿಸಿದ ಅವರು, ನಾವು ಯಾರ ಕತ್ತನ್ನೂ ಕೊಯ್ದಿಲ್ಲ. ಕಾಂಗ್ರೆಸ್ ದೇವೇಗೌಡರನ್ನು ಪ್ರಧಾನಮಂತ್ರಿ ಮಾಡಿದ ಕಾರಣಕ್ಕೆ ಇಡೀ ದೇಶ ಅವರನ್ನು ನೆನೆಸಿಕೊಳ್ಳುವುದು. ಜೆಡಿಎಸ್‌ನವರನ್ನು ಈ ದೇಶ ಗುರುತಿಸುವಂತಹ ಕೆಲಸಗಳನ್ನು ಮಾಡಿರುವುದು ನಮ್ಮ (ಕಾಂಗ್ರೆಸ್) ಪಕ್ಷ. ಕಾಂಗ್ರೆಸ್ ಪ್ರಧಾನಿ ಮಾಡದೇ ಹೋಗಿದ್ದರೆ ಅವರನ್ನು ಈ ದೇಶ ನೆನಪಿಸಿಕೊಳ್ಳುತ್ತಿರಲಿಲ್ಲ. ಕುಮಾರಸ್ವಾಮಿ ಮುಖ್ಯಮಂತ್ರಿಯೂ ಆಗುತ್ತಿರಲಿಲ್ಲ ಎಂದು ಹೇಳಿದರು.
ರಾಜಕೀಯವಾಗಿ ನನಗೆ ಡಿಕೆಶಿ ವಿಷ ಹಾಕಿದ್ರು -ಎಚ್‌ಡಿಕೆ; ಯಾರಿಗೂ ವಿಷ ಹಾಕಿಲ್ಲ ಒಳ್ಳೇದು ಮಾಡಿದ್ದೇವೆ: ಡಿಕೆ ಸುರೇಶ್
ಮಾಜಿ ಪ್ರಧಾನಮಂತ್ರಿ ಎಚ್.ಡಿ. ದೇವೇಗೌಡ ಅವರು ಈ ಹಿಂದೆ, ‘ಮುಂದಿನ ಜನ್ಮದಲ್ಲಿ ಮುಸ್ಲಿಮನಾಗಿ ಹುಟ್ಟುತ್ತೇನೆʼ, ‘ಮೋದಿ ಗೆದ್ದರೆ ದೇಶ ಬಿಟ್ಟು ಹೋಗುತ್ತೇನೆʼ, ‘ರಾಜ್ಯಕ್ಕೆ ರಾಷ್ಟ್ರೀಯ ಪಕ್ಷಗಳ ಅವಶ್ಯಕತೆಯಿಲ್ಲ, ಪ್ರಾದೇಶಿಕ ಪಕ್ಷಗಳ ಅವಶ್ಯಕತೆ ಇದೆʼ ಎಂಬೆಲ್ಲ ಹೇಳಿಕೆಗಳನ್ನು ನೀಡಿದ್ದರು. ಅವುಗಳನ್ನು ಜನರಿಗೆ ತೋರಿಸಿ. ಬಿಜೆಪಿ ಹಾಗೂ ಜೆಡಿಎಸ್ ನಡುವಿನ ಸಂಬಂಧವನ್ನು ಜನರೇ ತೀರ್ಮಾನಿಸುತ್ತಾರೆ ಎಂದು ಮಾಧ್ಯಮಗಳಿಗೆ ಸಲಹೆ ನೀಡಿದರು.
ಕುಕ್ಕರ್ ಹಂಚಿಕೆ ಆರೋಪಕ್ಕೆ ಪ್ರತಿಕ್ರಿಯಿಸಿದ ಅವರು, ಕೆಲವರು ಪ್ರಚಾರಕ್ಕಾಗಿ ಏನೇನೋ ಮಾತನಾಡುತ್ತಾರೆ. ಕುಮಾರಸ್ವಾಮಿ ಅವರ ಮಾತುಗಳಿಗೆ ನಾನು ಉತ್ತರ ನೀಡಲು ಹೋಗುವುದಿಲ್ಲ ಎಂದರು.
