ಬಿಜೆಪಿ ಜೊತೆಗಿನ ಕ್ಷೇತ್ರ ಹಂಚಿಕೆ ಕುರಿತು ಪ್ರತಿಕ್ರಿಯಿಸಿ, ಜೆಡಿಎಸ್‌ ಮತ್ತು ಬಿಜೆಪಿ ನಡುವೆ ಕ್ಷೇತ್ರ ಹಂಚಿಕೆ ವಿಚಾರದಲ್ಲಿ ಯಾವುದೇ ಸಮಸ್ಯೆ, ಗೊಂದಲ ಇಲ್ಲ. ಯಾವ, ಯಾವ ಕ್ಷೇತ್ರದಲ್ಲಿ ಯಾರು, ಯಾರು ಸ್ಪರ್ಧೆ ಮಾಡುತ್ತಾರೆ ಎನ್ನುವುದನ್ನು ನಾವೇ ಪರಸ್ಪರ ಕೂತು ಅಂತಿಮಗೊಳಿಸುತ್ತೇವೆ. ಜನವರಿ ಅಂತ್ಯದೊಳಗೆ ನಿರ್ಧಾರ ಕೈಗೊಳ್ಳುತ್ತೇವೆ: ಜೆಡಿಎಸ್‌ ರಾಜ್ಯಾಧ್ಯಕ್ಷ ಎಚ್‌.ಡಿ. ಕುಮಾರಸ್ವಾಮಿ 

ದೆಹಲಿ(ಡಿ.22):  ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಜೊತೆಗಿನ ಕ್ಷೇತ್ರ ಹಂಚಿಕೆ ಕುರಿತು ಜನವರಿ ಅಂತ್ಯಕ್ಕೆ ಅಂತಿಮ ತೀರ್ಮಾನಕ್ಕೆ ಬರಲಾಗುವುದು ಎಂದು ಜೆಡಿಎಸ್‌ ರಾಜ್ಯಾಧ್ಯಕ್ಷ ಎಚ್‌.ಡಿ. ಕುಮಾರಸ್ವಾಮಿ ಸ್ಪಷ್ಟಪಡಿಸಿದ್ದಾರೆ. ದೆಹಲಿಯಲ್ಲಿ ಗುರುವಾರ ಪ್ರಧಾನಿ ಮೋದಿ ಭೇಟಿ ಬಳಿಕ ಸುದ್ದಿಗಾರರ ಜೊತೆ ಅವರು ಮಾತನಾಡಿದರು. ಬಿಜೆಪಿ ಜೊತೆಗಿನ ಕ್ಷೇತ್ರ ಹಂಚಿಕೆ ಕುರಿತು ಪ್ರತಿಕ್ರಿಯಿಸಿ, ಜೆಡಿಎಸ್‌ ಮತ್ತು ಬಿಜೆಪಿ ನಡುವೆ ಕ್ಷೇತ್ರ ಹಂಚಿಕೆ ವಿಚಾರದಲ್ಲಿ ಯಾವುದೇ ಸಮಸ್ಯೆ, ಗೊಂದಲ ಇಲ್ಲ. ಯಾವ, ಯಾವ ಕ್ಷೇತ್ರದಲ್ಲಿ ಯಾರು, ಯಾರು ಸ್ಪರ್ಧೆ ಮಾಡುತ್ತಾರೆ ಎನ್ನುವುದನ್ನು ನಾವೇ ಪರಸ್ಪರ ಕೂತು ಅಂತಿಮಗೊಳಿಸುತ್ತೇವೆ. ಜನವರಿ ಅಂತ್ಯದೊಳಗೆ ನಿರ್ಧಾರ ಕೈಗೊಳ್ಳುತ್ತೇವೆ ಎಂದರು.

ಎಷ್ಟು ಕ್ಷೇತ್ರ ಕೇಳುತ್ತಿದ್ದೀರಿ ಎನ್ನುವ ಪ್ರಶ್ನೆಗೆ, ನಾವು ಗೆಲ್ಲುವ ಕಡೆಯಷ್ಟೇ ಕ್ಷೇತ್ರ ಕೇಳುತ್ತೇವೆ. ನಾವು ಎಲ್ಲೆಲ್ಲಿ ಗೆಲ್ಲುತ್ತೇವೆ ಎಂದು ನಮ್ಮ ಬಳಿ ರಿಪೋರ್ಟ್ ಇದೆ. ಆ ರಿಪೋರ್ಟ್ ಪ್ರಕಾರ ನಾವು ಕೆಲಸ ಮಾಡುತ್ತೇವೆ. ಮೂರನೇ ಅವಧಿಗೆ ನರೇಂದ್ರ ಮೋದಿ ಅವರು ಪ್ರಧಾನಿಯಾಗಲು ನಾವೆಲ್ಲಾ ಒಟ್ಟಾಗಿ ಕೆಲಸ ಮಾಡುತ್ತೇವೆ ಎಂದರು. 

ದೇವೇಗೌಡ್ರ ಫ್ಯಾಮಿಲಿ ಮೋದಿ ಭೇಟಿಯಾಗ್ತಿದ್ದಂತೆ ಜೆಡಿಎಸ್‌ ವಿರುದ್ಧ ಕೋರ್ಟ್ ಮೆಟ್ಟಿಲೇರಿದ ಸಿಎಂ ಇಬ್ರಾಹಿಂ!

ನನ್ನ, ನಿಖಿಲ್‌ ಸ್ಪರ್ಧೆ ಇಲ್ಲ: ಎಚ್‌ಡಿಕೆ ಸ್ಪಷ್ಟನೆ

ಮುಂಬರುವ ಲೋಕಸಭಾ ಚುನಾವಣೆಗೆ ಸ್ಪರ್ಧಿಸುವ ಕುರಿತಾಗಿ ಕೇಳಲಾದ ಪ್ರಶ್ನೆಗೆ ಪ್ರತಿಕ್ರಿಯಿಸಿ, ಲೋಕಸಭಾ ಚುನಾವಣೆಗೆ ತಾವಾಗಲಿ, ನಿಖಿಲ್‌ ಆಗಲಿ ಸ್ಪರ್ಧೆ ಮಾಡುವುದಿಲ್ಲ ಎಂದು ಸ್ಪಷ್ಟಪಡಿಸಿದರು. ಲೋಕಸಭೆಗೆ ಸ್ಪರ್ಧೆ ಮಾಡುವ ಉದ್ದೇಶ ನನಗಿಲ್ಲ. ನಾನೇನಿದ್ದರೂ ರಾಜ್ಯ ರಾಜಕಾರಣಕ್ಕೆ ಸೀಮಿತ. ನಾನು ಇಲ್ಲಿಯೇ ಇದ್ದರೆ ರಾಜ್ಯಕ್ಕೆ ಒಳ್ಳೆಯದು ಎನ್ನುವುದು ಜನರ ಅಭಿಪ್ರಾಯ, ನನ್ನ ಅಭಿಪ್ರಾಯವೂ ಅದೇ ಆಗಿದೆ. ನಾನು ಕರ್ನಾಟಕದಲ್ಲೇ ಇರಲು ತೀರ್ಮಾನ ಮಾಡಿದ್ದೇನೆ ಎಂದರು. ಕೇಂದ್ರ ಸಚಿವರಾಗುತ್ತೀರಾ ಎಂಬ ಪ್ರಶ್ನೆಗೆ, ಯಾರ ಹಣೆಯ ಮೇಲೆ ಏನು ಬರೆದಿದೆ ಎಂಬುದು ಗೊತ್ತಿಲ್ಲ. ರಾಜಕೀಯದಲ್ಲಿ ಏನು ಬೇಕಾದರೂ ಆಗಬಹುದು. ಕಾದು ನೋಡೋಣ ಎಂದರು.

28 ಕ್ಷೇತ್ರದಲ್ಲೂ ನಿಖಿಲ್‌ ಪ್ರಚಾರ: ತಮ್ಮ ಪುತ್ರನ ಸ್ಪರ್ಧೆ ಕುರಿತು ಪ್ರತಿಕ್ರಿಯಿಸಿದ ಎಚ್‌ಡಿಕೆ, ನಿಖಿಲ್‌ ಮಂಡ್ಯ ಕ್ಷೇತ್ರದಿಂದ ಕಣಕ್ಕೆ ಇಳಿಯಲಿ, ಎರಡು ಬಾರಿ ಅವರು ಸೋತಿದ್ದಾರೆ. ಹೀಗಾಗಿ ಜನರ ಅನುಕಂಪವೂ ಇದೆ ಎಂದು ಜನ, ಪಕ್ಷದ ಕಾರ್ಯಕರ್ತರು ಒತ್ತಾಯಿಸುತ್ತಿದ್ದಾರೆ. ಆದರೆ, ನಿಖಿಲ್‌ ಸ್ಪರ್ಧಿಸಲ್ಲ. ಅವರು ಎಲ್ಲಾ 28 ಲೋಕಸಭಾ ಕ್ಷೇತ್ರಗಳಲ್ಲಿಯೂ ಪ್ರಚಾರ ಮಾಡುತ್ತಾರೆ ಎಂದರು.