ನಾಯಕತ್ವ ಬದಲಾವಣೆ ಚರ್ಚೆ: ಬಿಜೆಪಿ ಶಾಸಕರುಗಳಿಗೆ ಸ್ಪಷ್ಟ ಸಂದೇಶ ಕೊಟ್ಟ ಸಿಎಂ
* ತಮ್ಮ ಪರ ಸಹಿ ಸಂಗ್ರಹಕ್ಕೆ ನಿಂತ ಶಾಸಕರಿಗೆ ಬಿಎಸ್ವೈ ಸಂಕಷ್ಟದ ಪಾಠ
* ಬಿಜೆಪಿ ಶಾಸಕರುಗಳಿಗೆ ಕಿವಿ ಹೇಳಿದ ಸಿಎಂ ಬಿಎಸ್ ಯಡಿಯೂರಪ್ಪ
* ಸಂಕಷ್ಟದಲ್ಲಿರುವ ಜನರಿಗೆ ನೆರವಾಗಿ ಎಂದ ಸಿಎಂ
ಬೆಂಗಳೂರು, (ಜೂನ್.07): ಕೊರೋನಾ ಸಂಕಷ್ಟದ ಮಧ್ಯೆ ರಾಜ್ಯ ಬಿಜೆಪಿಯಲ್ಲಿ ನಾಯಕತ್ವ ಬದಲಾವಣೆ ಚರ್ಚೆ ಜೋರಾಗಿದೆ. ಇನ್ನು ಈ ಬಗ್ಗೆ ಬಿಜೆಪಿ ನಾಯಕರುಗಳು ನಾನಾ ಅರ್ಥದಲ್ಲಿ ಹೇಳಿಕೆಗಳನ್ನು ಕೊಡುತ್ತಿದ್ದಾರೆ.
"
ಇದರಿಂದ ಪಕ್ಷದ ನಾಯಕರಲ್ಲೇ ಆರೋಪ-ಪ್ರತ್ಯಾರೋಪಗಳು ಶುರುವಾಗಿವೆ. ಇನ್ನು ಈ ಬಗ್ಗೆ ಸಿಎಂ ಬಿಎಸ್ ಯಡಿಯೂರಪ್ಪ ಪ್ರತಿಕ್ರಿಯಿಸಿ, ಬಿಜೆಪಿ ಶಾಸಕರುಗಳಿಗೆ ಕಿವಿ ಮಾತೊಂದನ್ನು ಹೇಳಿದ್ದಾರೆ.
ಯಡಿಯೂರಪ್ಪ ಪರ ಸಹಿ ಸಂಗ್ರಹ: ಬಿಜೆಪಿಯಲ್ಲಿ ಭುಗಿಲೆದ್ದ ಆಕ್ರೋಶ
ಈ ಸಂಬಂಧ ಟ್ವೀಟ್ ಮಾಡಿ ಮನವಿ ಮಾಡಿಕೊಂಡಿರುವ ಯಡಿಯೂರಪ್ಪ, ಕೋವಿಡ್ ಸಾಂಕ್ರಾಮಿಕದಿಂದ ಜನ ಸಂಕಷ್ಟಗಳನ್ನು ಎದುರಿಸುತ್ತಿರುವ ಈ ಸಂದರ್ಭದಲ್ಲಿ, ಪ್ರತಿಯೊಬ್ಬ ಬಿಜೆಪಿ ಶಾಸಕರು ತಮ್ಮ ತಮ್ಮ ಕ್ಷೇತ್ರದಲ್ಲಿ ಕೋವಿಡ್ ನಿಯಂತ್ರಣ ಕಾರ್ಯಗಳಿಗೆ ಆದ್ಯತೆ ನೀಡಬೇಕು. ಯಾರೂ ಕೂಡ ಸಹಿ ಸಂಗ್ರಹಿಸುವುದಾಗಲಿ, ರಾಜಕೀಯ ಹೇಳಿಕೆಗಳನ್ನು ನೀಡುವುದಾಗಲಿ ಮಾಡದೆ, ಸಂಕಷ್ಟದಲ್ಲಿರುವ ಜನರಿಗೆ ನೆರವಾಗಬೇಕು ಎಂದು ವಿನಂತಿಸುತ್ತೇನೆ ಎಂದಿದ್ದಾರೆ.
ರಾಜ್ಯ ಬಿಜೆಪಿಯಲ್ಲಿ ಸಿಎಂ ಬದಲಾವಣೆ, ದೆಹಲಿ ಪ್ರಯಾಣ, ಸಹಿ ಸಂಗ್ರಹ ಸೇರಿದಂತೆ ಹಲವು ವಿದ್ಯಮಾನಗಳ ಬಗ್ಗೆ ಚರ್ಚೆಗಳು ನಡೆಯುತ್ತಿವೆ. ಅದರಲ್ಲೂ ಹೈಕಮಾಂಡ್ ಕೇಳಿದರೆ ರಾಜೀನಾಮೆ ನೀಡುತ್ತೇನೆ ಎಂದು ಸಿಎಂ ಸ್ಫೋಟಕ ಹೇಳಿಕೆ ನೀಡಿದ್ದ ಬೆನ್ನಲ್ಲೇ ಮತ್ತಷ್ಟು ರಾಜಕೀಯ ಚಟುವಟಿಕೆಗಳು ಗರಿಗೆದರಿವೆ.