Asianet Suvarna News Asianet Suvarna News

Chikkaballapur: ಅನಧಿಕೃತ ಮದ್ಯ ಮಾರಾಟಕ್ಕೆ ಕಡಿವಾಣ ಹಾಕಿ: ಜಿಲ್ಲಾಧಿಕಾರಿ ಎನ್.ಎಂ.ನಾಗರಾಜು

ಚುನಾವಣೆ ನೀತಿ ಸಂಹಿತೆ ಜಾರಿಯಲ್ಲಿದ್ದು, ಜಿಲ್ಲೆಯಲ್ಲಿ ಅನಧಿಕೃತ ಮದ್ಯ ಮಾರಾಟ ಕಂಡುಬಂದರೆ ಪ್ರಕರಣ ದಾಖಲಿಸಿ ಕಟ್ಟುನಿಟ್ಟಿನ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಅಬಕಾರಿ ಇಲಾಖೆಯ ಅಧಿಕಾರಿಗಳು ಹಾಗೂ ಎಲ್ಲಾ ವಿಧಾನಸಭಾ ಕ್ಷೇತ್ರಗಳ ಚುನಾವಣಾಧಿಕಾರಿಗಳಿಗೆ ಜಿಲ್ಲಾಧಿಕಾರಿಗಳು ಹಾಗೂ ಜಿಲ್ಲಾ ಚುನಾವಣಾಧಿಕಾರಿ ಎನ್.ಎಂ.ನಾಗರಾಜು ಅವರು ಸೂಚಿಸಿದರು. 

Curb illegal liquor sale Says Chikkaballapur DC NM Nagaraju gvd
Author
First Published Apr 3, 2023, 9:22 PM IST

ವರದಿ: ರವಿಕುಮಾರ್ ವಿ, ಏಷ್ಯಾನೆಟ್ ಸುವರ್ಣ ‌ನ್ಯೂಸ್, ಚಿಕ್ಕಬಳ್ಳಾಪುರ

ಚಿಕ್ಕಬಳ್ಳಾಪುರ (ಏ.03): ಚುನಾವಣೆ ನೀತಿ ಸಂಹಿತೆ ಜಾರಿಯಲ್ಲಿದ್ದು, ಜಿಲ್ಲೆಯಲ್ಲಿ ಅನಧಿಕೃತ ಮದ್ಯ ಮಾರಾಟ ಕಂಡುಬಂದರೆ ಪ್ರಕರಣ ದಾಖಲಿಸಿ ಕಟ್ಟುನಿಟ್ಟಿನ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಅಬಕಾರಿ ಇಲಾಖೆಯ ಅಧಿಕಾರಿಗಳು ಹಾಗೂ ಎಲ್ಲಾ ವಿಧಾನಸಭಾ ಕ್ಷೇತ್ರಗಳ ಚುನಾವಣಾಧಿಕಾರಿಗಳಿಗೆ ಜಿಲ್ಲಾಧಿಕಾರಿಗಳು ಹಾಗೂ ಜಿಲ್ಲಾ ಚುನಾವಣಾಧಿಕಾರಿ ಎನ್.ಎಂ.ನಾಗರಾಜು ಅವರು ಸೂಚಿಸಿದರು. ಇಂದು ಜಿಲ್ಲಾಧಿಕಾರಿಗಳ ಕಚೇರಿಯ ಸಭಾಂಗಣದಲ್ಲಿ ನೀತಿ‌ಸಂಹಿತೆ ಕಟ್ಟುನಿಟ್ಟಿನ ಜಾರಿಗೆ ಸಂಬಂಧಿಸಿದಂತೆ ಹಮ್ಮಿಕೊಂಡಿದ್ದ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಜಿಲ್ಲೆಯ ಗಡಿ ಪ್ರದೇಶಗಳಲ್ಲಿ ನಿರ್ಮಿಸಲಾಗಿರುವ ಚೆಕ್ ಪೋಸ್ಟ್ ಗಳು ಪರಿಣಾಮಕಾರಿಯಾಗಿ ಕಾರ್ಯನಿರ್ವಹಿಸಬೇಕು. 

ಅಕ್ರಮ ಪ್ರಕರಣಗಳು ಕಂಡುಬಂದರೆ ಕೂಡಲೇ ಕಾನೂನು ರೀತಿ ಕ್ರಮಕೈಗೊಳ್ಳಬೇಕು. ಪ್ರತಿದಿನ ಲಿಕ್ಕರ್ ಶಾಪ್ ಗಳಿಗೆ ಭೇಟಿ ನೀಡಬೇಕು. ಚುನಾವಣೆ ನೀತಿ ಸಂಹಿತೆ ಜಾರಿಯಲ್ಲಿದ್ದು ಈ ಸಂದರ್ಭದಲ್ಲಿ ಆಮಿಷವೊಡ್ಡಲು ಲಿಕ್ಕರ್ ಶಾಪ್ ಗಳಲ್ಲಿ ಹಾಗೂ ಬಾರ್ ಹಾಗೂ ರೆಸ್ಟೋರೆಂಟ್ ಗಳಲ್ಲಿ ಜನರಿಗೆ ಉಚಿತವಾಗಿ ಲಿಕ್ಕರ್ ನೀಡಿ ಬೇರೆಯವರು ದುಡ್ಡು ಪಾವತಿ ಮಾಡುವ ಬಗ್ಗೆ ಕಡಿವಾಣ ಹಾಕಲು ನಿಗಾವಹಿಸಬೇಕು. ಈ ಬಗ್ಗೆ ಬಾರ್ ಅಂಡ್ ರೆಸ್ಟೋರೆಂಟ್ ಗಳ ಮಾಲೀಕರಿಗೆ ಸೂಚಿಸಬೇಕು ಎಂದು ಅಬಕಾರಿ ಇಲಾಖೆ ಅಧಿಕಾರಿಗಳಿಗೆ ಅವರು ತಿಳಿಸಿದರು. ಬಾರ್ ಗಳಿಂದ ಮನೆಗಳಿಗೆ ಬೃಹತ್ ಪ್ರಮಾಣದಲ್ಲಿ (ಬಲ್ಕ್) ಲಿಕ್ಕರ್ ಸರಬರಾಜು ಮಾಡುವ ಬಗ್ಗೆ ಗಮನಹರಿಸಿ. 

ಕಾಂಗ್ರೆಸ್‌ನಿಂದ ಮಾತ್ರ ಬಡವರ ಏಳ್ಗೆ: ಮಾಜಿ ಸಚಿವ ಮೇಟಿ

ಹಳ್ಳಿಗಳ ಕಿರಾಣಿ ಅಂಗಡಿಗಳು ಹಾಗೂ ಮನೆಗಳಲ್ಲಿ ಮದ್ಯ ಮಾರಾಟದ ಕುರಿತು ಪರಿಶೀಲಿಸಿ, ಮಾರಾಟ ಕಂಡುಬಂದರೆ ಪ್ರಕರಣ ದಾಖಲಿಸಬೇಕು. ಲಿಕ್ಕರ್ ಅಂಗಡಿಗಳು ಮಾದರಿ ನೀತಿ ಸಂಹಿತೆ ಉಲ್ಲಂಘನೆಯಾಗದ ರೀತಿ ಕಾರ್ಯನಿರ್ವಹಿಸಲು ನಿಗಾ ಇಡಬೇಕು. ಅಬಕಾರಿ ಇಲಾಖೆ ವತಿಯಿಂದ ಚೆಕ್ ಪೋಸ್ಟ್ ಗಳಲ್ಲಿ ಪರಿಶೀಲನೆ ಮಾಡಬೇಕು ಎಂದು ತಿಳಿಸಿದರು. ವಾಣಿಜ್ಯ ತೆರಿಗೆ ಇಲಾಖೆ ಎಲ್ಲ ಚೆಕ್ ಪೋಸ್ಟ್ ಗಳಲ್ಲಿ ತಮ್ಮ ಇಲಾಖೆಯ ವತಿಯಿಂದ ಸಿಬ್ಬಂದಿಯನ್ನು ನಿಯೋಜಿಸಬೇಕು. ಆಂಧ್ರದಿಂದ ಬರುವ ಕಮರ್ಷಿಯಲ್ ವಾಹನಗಳ ಪರಿಶೀಲನೆ ಮಾಡಬೇಕು. ಅಂತರಾಜ್ಯ ಗಡಿ ಭಾಗದ ಚೆಕ್ ಪೋಸ್ಟ್ ಸೇರಿದಂತೆ ವಿವಿಧ ಚೆಕ್ ಪೋಸ್ಟ್ ಗಳಿಗೆ ಭೇಟಿ ನೀಡಿ ವಾಣಿಜ್ಯ ತೆರಿಗೆಗಳ ಇಲಾಖೆಯವರು ಪರಿಶೀಲನೆ ನಡೆಸಬೇಕು ಎಂದು ತಿಳಿಸಿದರು. 

ಚುನಾವಣಾ ಪೂರ್ವ ಈ ಸಮಯದಲ್ಲಿ ಮತದಾರರಿಗೆ ಆಮಿಷವೊಡ್ಡಲು ಹಲವು ಬಗೆಯಲ್ಲಿ ಪ್ರಯತ್ನಗಳು ನಡೆಯುವ ಸಾಧ್ಯತೆಗಳಿರುತ್ತವೆ. ಹೆಚ್ಚಿನ ಮೊತ್ತದ ನಗದು, ಸೀರೆ, ಕುಕ್ಕರ್, ಪಾತ್ರೆ, ಬಟ್ಟೆಗಳು ಮತ್ತಿತರ ಉಡುಗೊರೆ ಸಾಮಗ್ರಿಗಳನ್ನು ಅಕ್ರಮವಾಗಿ ಸಾಗಣೆ ಮಾಡುವ ಸಂಭವವಿರುತ್ತದೆ. ಹೆಚ್ಚಿನ ನಿಗಾವಹಿಸಿ ವಾಹನಗಳ ತಪಾಸಣೆ ನಡೆಸಬೇಕು. ತಪಾಸಣೆ ಕಾರ್ಯದ ವಿಡಿಯೋ ಚಿತ್ರೀಕರಣ ಮಾಡಬೇಕು. ಯಾವುದೇ ಸಾಮಗ್ರಿಗಳ ಸಾಗಣೆಯ ಬಗ್ಗೆ ಸಂಶಯ ಬಂದಲ್ಲಿ ಸಮಗ್ರವಾಗಿ ತನಿಖೆ ನಡೆಸಿ, ಅಕ್ರಮ ಕಂಡುಬಂದಲ್ಲಿ ಕೂಡಲೆ ಕಾನೂನು ಕ್ರಮ ಕೈಗೊಂಡು ಸಂಬಂಧಪಟ್ಟ ಅಧಿಕಾರಿಗಳಿಗೆ ಮಾಹಿತಿ ನೀಡಬೇಕು ಎಂದು ತಿಳಿಸಿದರು. 

ಚೆಕ್‌ಪೋಸ್ಟ್‌ಗಳು ದಿನದ 24 ಗಂಟೆಯೂ ಕಾರ್ಯ ನಿರ್ವಹಿಸುವುದರಿಂದ, ಸರದಿ ಆಧಾರದಲ್ಲಿ ಸಿಬ್ಬಂದಿಯನ್ನು ನಿಯೋಜಿಸಲಾಗಿದೆ. ಸಂಬಂಧಪಟ್ಟ ಸಿಬ್ಬಂದಿಗಳು ಸಮಯಕ್ಕೆ ಸರಿಯಾಗಿ ಕರ್ತವ್ಯಕ್ಕೆ ಹಾಜರಾಗಿ ಕರ್ತವ್ಯ ನಿರ್ವಹಿಸಬೇಕು ಎಂದರು. ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪ್ರಕಾಶ್ ಜಿ.ಟಿ.ನಿಟ್ಟಾಲಿ ಅವರು ಮಾತನಾಡಿ, ಈ ಬಾರಿ 80 ವರ್ಷ ಮೇಲ್ಪಟ್ಟ ಹಿರಿಯರು ಹಾಗೂ ವಿಶೇಷ ಚೇತನರಿಗೆ ಮನೆಯಿಂದಲೇ ಮತದಾನ ಮಾಡುವ ಅವಕಾಶ ಕಲ್ಪಿಸಲಾಗಿದ್ದು, ಈ ಬಗ್ಗೆ ಪ್ರತಿ ಗ್ರಾಮದಲ್ಲಿ ಸರ್ವೇ ಮಾಡಿ ಅರ್ಹರನ್ನು ಗುರ್ತಿಸಬೇಕು. ಅವರಿಗೆ 12ಡಿ ನಮೂನೆಯನ್ನು ನೀಡಿ ಖಾತ್ರಿ ಮಾಡಿಕೊಳ್ಳಬೇಕು. ಈ ಬಗ್ಗೆ ಹೆಚ್ಚು ಜಾಗೃತಿ ಮೂಡಿಸಬೇಕು. ಎಲ್ಲಾ ಮತಗಟ್ಟೆಗಳು ಸುಸ್ಥಿತಿಯಲ್ಲಿ ಇಡಲು ಎಲ್ಲಾ ರೀತಿಯ ಅಗತ್ಯ ಕ್ರಮ ಕೈಗೊಳ್ಳಬೇಕು. 

ರಾಜ್ಯದಲ್ಲಿ ಮತ್ತೆ ಬಿಜೆಪಿ ಅಧಿಕಾರಕ್ಕೆ ಬರಲಿದೆ: ವಿಶ್ವೇಶ್ವರ ಹೆಗಡೆ ಕಾಗೇರಿ

ಎಲ್ಲಾ ಮತಗಟ್ಟೆಗಳು ಕಡ್ಡಾಯವಾಗಿ ಎಲ್ಲಾ ಮೂಲಭೂತ ಸೌಲಭ್ಯಗಳನ್ನು ಹೊಂದಿರಬೇಕು. ಇದಕ್ಕೆ ಸಂಬಂಧಿಸಿದಂತೆ ಸ್ವೀಪ್ ಚಟುವಟಿಕೆಗಳನ್ನು ಪರಿಣಾಮಕಾರಿಯಾಗಿ ಆಯೋಜಿಸಬೇಕು ಎಂದು ಸೂಚಿಸಿದರು. ಸಭೆಯಲ್ಲಿ ಜಿಲ್ಲಾ ಪೋಲಿಸ್ ವರಿಷ್ಠಾಧಿಕಾರಿ ಡಿ.ಎಲ್.ನಾಗೇಶ್, ಉಪವಿಭಾಗಾಧಿಕಾರಿ ಸಂತೋಷ್ ಕುಮಾರ್, ಜಿಲ್ಲಾ ಪಂಚಾಯಿತಿ ಉಪಕಾರ್ಯದರ್ಶಿ ಬಿ.ಶಿವಕುಮಾರ್, ಮುಖ್ಯ ಲೆಕ್ಕಾಧಿಕಾರಿ ಹರೀಶ್, ಜಿಲ್ಲಾ ಯೋಜನಾಧಿಕಾರಿ ಗಿರಿಜಾಶಂಕರ್, ಸಹಾಯಕ ಯೋಜನಾಧಿಕಾರಿ ಡಾ.ಮೈತ್ರಿ ಹಾಗೂ ವಿಧಾನಸಭಾ ಕ್ಷೇತ್ರಗಳ ಚುನಾವಣಾಧಿಕಾರಿಗಳು, ಅಬಕಾರಿ ಇಲಾಖೆಯ, ವಾಣಿಜ್ಯ ತೆರಿಗೆ ಇಲಾಖೆಯ ಅಧಿಕಾರಿಗಳು ಉಪಸ್ಧಿತರಿದ್ದರು.

Follow Us:
Download App:
  • android
  • ios