* ಚುನಾವಣೆ ಕಾಂಗ್ರೆಸ್ ಭರ್ಜರಿ ತಯಾರಿ * ಸಿದ್ದರಾಮಯ್ಯ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್‌ ಮಹತ್ವದ ಚರ್ಚೆ* ಡಿಸೆಂಬರ್‌ನಲ್ಲಿ ನಡೆಯಲಿರುವ ವಿಧಾನಪರಿಷತ್‌ನ 25 ಸ್ಥಾನಗಳ ಚುನಾವಣೆ

ಬೆಂಗಳೂರು, (ಸೆ.04): ಪಕ್ಷ ಸಂಘಟನೆ ಹಾಗೂ ಮುಂಬರುವ ಡಿಸೆಂಬರ್‌ನಲ್ಲಿ ನಡೆಯಲಿರುವ ವಿಧಾನಪರಿಷತ್‌ನ 25 ಸ್ಥಾನಗಳ ಚುನಾವಣೆ ಕಾಂಗ್ರೆಸ್ ಭರ್ಜರಿ ತಯಾರಿ ನಡೆಸಿದೆ.

ಹೌದು....ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್‌ ಅವರು ಇಂದು (ಸೆ.04) ಇಡೀ ದಿನ ವಿಧಾನಪರಿಷತ್‌ ಬಗ್ಗೆ ಮುಖಂಡರ ಜತೆ ಸಮಾಲೋಚನೆ ನಡೆಸಿದರು.

ತಾಲೂಕು, ಜಿಲ್ಲಾ ಪಂಚಾಯಿತಿ ಎಲೆಕ್ಷನ್ ನಿರೀಕ್ಷೆಯಲ್ಲಿದ್ದವರಿಗೆ ಬಿಗ್ ಶಾಕ್

ನಗರ ಸ್ಥಳೀಯ ಸಂಸ್ಥೆಗಳು ಹಾಗೂ ಪದವೀಧರ ಕ್ಷೇತ್ರಗಳಿಂದ ವಿಧಾಪರಿಷತ್‌ಗೆ ನಡೆಯಲಿರುವ ಚುನಾವಣೆಯಲ್ಲಿ ಎಲ್ಲ ಕ್ಷೇತ್ರ ಗೆಲ್ಲಲು ನಾವು ಶ್ರಮ ಹಾಕಬೇಕು. ಈಗಿನಿಂದಲೇ ಕಾರ್ಯದತ್ತ ಗಮನಹರಿಸಿ. ಜಿಲ್ಲಾ ಮಟ್ಟದಲ್ಲಿ ನಾಯಕರು ಯಾವುದೇ ಭಿನ್ನಾಭಿಪ್ರಾಯಕ್ಕೆ ಅವಕಾಶ ಕೊಡದಂತೆ ಎಲ್ಲರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಪಕ್ಷದ ಗೆಲುವಿಗೆ ಕಾರ್ಯತಂತ್ರ ರೂಪಿಸಬೇಕು ಎನ್ನುವ ಅಭಿಪ್ರಾಯಗಳು ಸಭೆಯಲ್ಲಿ ವ್ಯಕ್ತವಾದವು.

ಸಭೆಯ ಬಳಿಕ ಮಾತನಾಡಿದ ಡಿ.ಕೆ.ಶಿವಕುಮಾರ್‌, ವಿಧಾನ ಪರಿಷತ್‌ ಚುನಾವಣೆಯಲ್ಲಿ ಅಭ್ಯರ್ಥಿಗಳ ಆಯ್ಕೆಗೆ ಅರ್ಜಿ ಆಹ್ವಾನಿಸಿ 10 ದಿನಗಳ ಕಾಲಾವಕಾಶ ನೀಡಲು ಸಭೆಯಲ್ಲಿ ನಿರ್ಧರಿಸಲಾಯಿತು. ಈಗಾಗಲೇ ಪದವೀಧರ ಕ್ಷೇತ್ರದ ಅಭ್ಯರ್ಥಿಗೆ ಅರ್ಜಿ ಕರೆಯಲಾಗಿದೆ. ಬೇರೆ ಸ್ಥಳೀಯ ಸಂಸ್ಥೆಗಳ ಚುನಾವಣೆಗಳ ಅಭ್ಯರ್ಥಿಗಳ ಅರ್ಜಿಯನ್ನು ಸದ್ಯದಲ್ಲೇ ಕರೆಯಲಾಗುವುದು ಎಂದು ಹೇಳಿದರು.

ವಿಧಾನಪರಿಷತ್‌ ಚುನಾವಣೆ ಅಭ್ಯರ್ಥಿಗಳ ಆಯ್ಕೆ ಸಂಬಂಧ ಜಿಲ್ಲಾ ಮಟ್ಟದ ನಾಯಕರ ಜತೆ ಚರ್ಚೆ ಮಾಡಿ ವಾಸ್ತವಾಂಶ ಹಾಗೂ ಅಭಿಪ್ರಾಯ ಪಡೆಯುತ್ತಿದ್ದೇನೆ. ಈ ತಿಂಗಳಲ್ಲಿ ಅಭ್ಯರ್ಥಿಗಳ ಪಟ್ಟಿ ಅಂತಿಮಗೊಳಿಸುತ್ತೇವೆ ಎಂದು ತಿಳಿಸಿದರು.

ಕಾಂಗ್ರೆಸ್‌ ಪಕ್ಷದ ಜಿಲ್ಲಾವಾರು ಅಧ್ಯಕ್ಷರುಗಳು, ಶಾಸಕರು, ಮಾಜಿ ಶಾಸಕರು, ಪರಾಜಿತ ಅಭ್ಯರ್ಥಿಗಳನ್ನು ಕರೆದು ಪಕ್ಷದ ಸಂಘಟನೆ, ಮುಂಬರುವ ಜಿಲ್ಲಾ ಹಾಗೂ ತಾಲೂಕೂ ಪಂಚಾಯ್ತಿ, ವಿಧಾನ ಪರಿಷತ್‌ ಚುನಾವಣೆ ಬಗ್ಗೆ ಚರ್ಚೆ ಮಾಡುತ್ತಿದ್ದೇವೆ. ಮುಂದೆ ಯಾವ ರೀತಿ ಸಜ್ಜಾಗಬೇಕು ಎಂಬುದರ ಬಗ್ಗೆ ಅವರ ಅಭಿಪ್ರಾಯ ಪಡೆದು, ಮಾರ್ಗದರ್ಶನ ನೀಡಲಾಗಿದೆ ಎಂದರು.