ನೂತನ ಮುಖ್ಯಮಂತ್ರಿಯಾಗಿ ಡಿ.ಕೆ.ಶಿವಕುಮಾರ್ ಅವರ ಪ್ರಮಾಣ ವಚನಕ್ಕೂ ಮುನ್ನವೇ ದೆಹಲಿಯಲ್ಲಿ ಸಚಿವ ಸಂಪುಟ ರಚನೆಯ ಚಟುವಟಿಕೆಗಳು ಗರಿಗೆದರಿವೆ. ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ಪುತ್ರ ಪ್ರಿಯಾಂಕ್ ಖರ್ಗೆ, ತಮಗೆ ಹಾಗೂ ತಮ್ಮ ಆಪ್ತರಿಗೆ ಸಚಿವ ಸ್ಥಾನ ಕೊಡಿಸಲು ವರಿಷ್ಠರ ಜೊತೆ ಮಾತುಕತೆ ನಡೆಸಿದ್ದಾರೆ.

ನವದೆಹಲಿ (ಜೂ.3): ನೂತನ ಮುಖ್ಯಮಂತ್ರಿಯಾಗಿ ಡಿ.ಕೆ.ಶಿವಕುಮಾರ್(DK Shivakumar) ಅವರ ಪ್ರಮಾಣ ವಚನಕ್ಕೆ ಮುಹೂರ್ತ ನಿಗದಿಯಾದ ಬೆನ್ನಲ್ಲೇ ಮಂತ್ರಿಮಂಡಲ ರಚನೆ ಸಂಬಂಧ ದೆಹಲಿಯಲ್ಲಿ ಮಂಗಳವಾರ ಬಿರುಸಿನ ಚಟುವಟಿಕೆಗಳು ನಡೆದವು. ಸಚಿವಾಕಾಂಕ್ಷಿಗಳು ದೆಹಲಿಗೆ ತೆರಳಿ ಡಿಕೆಶಿ(DKS), ಸಿದ್ದು(Siddaramaiah), ವರಿಷ್ಠರನ್ನು ಭೇಟಿ ಮಾಡಿ, ಸಂಪುಟ ಸೇರುವ ಬಗ್ಗೆ ಲಾಬಿ ನಡೆಸಿದರು.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ಸಚಿವ ಸಂಪುಟ ಸೇರಲು ಪ್ರಿಯಾಂಕ್ ಗಾಂಧಿ ಲಾಬಿ

ಈ ಹಿನ್ನೆಲೆಯಲ್ಲಿ ದೆಹಲಿಗೆ ಆಗಮಿಸಿದ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ(AICC president Mallikarjun kharge) ಅವರ ಪುತ್ರ, ಮಾಜಿ ಸಚಿವ ಪ್ರಿಯಾಂಕ್‌ ಖರ್ಗೆ(Priyank kharge)ಯವರು ರಾಜ್ಯ ಕಾಂಗ್ರೆಸ್‌ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲ ನಿವಾಸಕ್ಕೆ ಭೇಟಿ ನೀಡಿ, ಸಂಪುಟ ರಚನೆ ಸಂಬಂಧ ಮಾತುಕತೆ ನಡೆಸಿದರು. ಬಳಿಕ, ಹಂಗಾಮಿ ಸಿಎಂ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿ, ನೂತನ ಸಚಿವ ಸಂಪುಟ ರಚನೆ ಸಂಬಂಧ ಮಾತುಕತೆ ನಡೆಸಿದರು.

ಕಲ್ಯಾಣ ಕರ್ನಾಟಕದ ಪ್ರಭಾವಿ ರಾಜಕಾರಣಿ ಖರ್ಗೆ

ಕಲ್ಯಾಣ ಕರ್ನಾಟಕ ಭಾಗದ ಕಾಂಗ್ರೆಸ್‌ನ ಪ್ರಭಾವಿ ನಾಯಕರಾಗಿರುವ, ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆಯವರ ಪುತ್ರರಾಗಿರುವ ಪ್ರಿಯಾಂಕ್‌ ಖರ್ಗೆ, ನೂತನ ಸಚಿವ ಸಂಪುಟ ಸೇರುವುದು ಬಹುತೇಕ ಪಕ್ಕಾ ಎನ್ನಲಾಗುತ್ತಿದೆ. ಇದೇ ವೇಳೆ, ಹೊಸ ಸಂಪುಟದಲ್ಲಿ ತಮ್ಮ ಆಪ್ತರಿಗೆ ಸ್ಥಾನ ಕಲ್ಪಿಸಿಕೊಡಲು ಖರ್ಗೆ ಬಣ ಸಾಕಷ್ಟು ಪ್ರಯತ್ನ ನಡೆಸಿದ್ದು, ಈ ನಿಟ್ಟಿನಲ್ಲಿಯೂ ಅವರು ಮಾತುಕತೆ ನಡೆಸಿದರು ಎಂದು ಮೂಲಗಳು ತಿಳಿಸಿವೆ.