ರಾಜ್ಯದ ಇತಿಹಾಸದಲ್ಲಿ ಇಷ್ಟು ದೊಡ್ಡ ನಾಟಕ ಮಾಡುವ ಸರ್ಕಾರ ಇನ್ನೊಂದಿಲ್ಲ. ಮುಖ್ಯಮಂತ್ರಿ ಸಿದ್ದರಾಮಯ್ಯ ಎರಡನೇ ಬಾರಿ ಆಡಳಿತಕ್ಕೆ ಬಂದ ಮೇಲೆ ತಮ್ಮ ತತ್ವ-ಸಿದ್ಧಾಂತಗಳನ್ನು ಗಾಳಿಗೆ ತೂರಿದ್ದು, ತಮ್ಮ ಸ್ಥಾನ ಉಳಿಸಿಕೊಳ್ಳಲು ಹೋರಾಟ ಮಾಡುತ್ತಿದ್ದಾರೆ ಎಂದು ಲೇವಡಿ ಮಾಡಿದ ಬೊಮ್ಮಾಯಿ
ಬೆಂಗಳೂರು(ಫೆ.08): ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಸರ್ಕಾರ ಮೂರನೇ ಬಾರಿ ಅಸ್ತಿತ್ವಕ್ಕೆ ಬಂದ ಒಂದು ತಿಂಗಳಲ್ಲಿ ಕಾಂಗ್ರೆಸ್ ದೇಶಾದ್ಯಂತ ಇಬ್ಭಾಗವಾಗಲಿದೆ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಭವಿಷ್ಯ ನುಡಿದಿದ್ದಾರೆ.
ಬುಧವಾರ ವಿಧಾನಸೌಧದ ಆವರಣದಲ್ಲಿನ ನಡೆದ ಪ್ರತಿಭಟನೆ ವೇಳೆ ಮಾತನಾಡಿದ ಅವರು, ರಾಜ್ಯದ ಇತಿಹಾಸದಲ್ಲಿ ಇಷ್ಟು ದೊಡ್ಡ ನಾಟಕ ಮಾಡುವ ಸರ್ಕಾರ ಇನ್ನೊಂದಿಲ್ಲ. ಮುಖ್ಯಮಂತ್ರಿ ಸಿದ್ದರಾಮಯ್ಯ ಎರಡನೇ ಬಾರಿ ಆಡಳಿತಕ್ಕೆ ಬಂದ ಮೇಲೆ ತಮ್ಮ ತತ್ವ-ಸಿದ್ಧಾಂತಗಳನ್ನು ಗಾಳಿಗೆ ತೂರಿದ್ದು, ತಮ್ಮ ಸ್ಥಾನ ಉಳಿಸಿಕೊಳ್ಳಲು ಹೋರಾಟ ಮಾಡುತ್ತಿದ್ದಾರೆ ಎಂದು ಲೇವಡಿ ಮಾಡಿದರು.
ಗೋಹತ್ಯೆ ತಡೆಯುವಲ್ಲಿ ಸಿದ್ದರಾಮಯ್ಯ ಸರ್ಕಾರ ವಿಫಲ: ಬಿಜೆಪಿ ಶಾಸಕ ಪ್ರಭು ಚವ್ಹಾಣ್
ರಾಜ್ಯದಲ್ಲಿ ಯಾವುದೇ ಅಭಿವೃದ್ಧಿ ಕಾಮಗಾರಿ ಆರಂಭವಾಗಿಲ್ಲ. ಬರ ಪರಿಹಾರ ನೀಡುವಲ್ಲಿ ಸರ್ಕಾರ ವಿಫಲವಾಗಿದೆ. ಯಾವ ನೈತಿಕತೆ ಇಟ್ಟುಕೊಂಡು ದೆಹಲಿಯಲ್ಲಿ ಪ್ರತಿಭಟನೆ ಮಾಡಿದ್ದಾರೆ. ಯುಪಿಎ ಸರ್ಕಾರದ ಅವಧಿಯಲ್ಲಿ ರಾಜ್ಯಕ್ಕೆ ಎಷ್ಟು ಅನುದಾನ ಬಂದಿದೆ? ಎನ್‌ಡಿಎ ಅವಧಿಯಲ್ಲಿ ಎಷ್ಟು ಬಂದಿದೆ ಎಂಬುದರ ಕುರಿತು ಸಿದ್ದರಾಮಯ್ಯ ಹೇಳಬೇಕು ಎಂದು ಆಗ್ರಹಿಸಿದರು.
ಕಾಂಗ್ರೆಸ್ ಸರ್ಕಾರವು ಶಾಸಕರ ಅನುದಾನ ಬಿಡುಗಡೆ ಮಾಡಿಲ್ಲ. ಕಾಂಗ್ರೆಸ್ ಶಾಸಕರಿಗೂ 25 ಕೋಟಿ ರು. ನೀಡುತ್ತೇವೆ ಎಂದು ಅವರಿಗೂ ಅನ್ಯಾಯ ಮಾಡುತ್ತಿದ್ದಾರೆ. ಖಜಾನೆ ತುಂಬಿದ್ದರೆ ರೈತರಿಗೆ ಬರ ಪರಿಹಾರ ನೀಡಬೇಕು. ಕಲ್ಯಾಣ ಕರ್ನಾಟಕಕ್ಕೆ ಮೂರು ಸಾವಿರ ಕೋಟಿ ರು. ಬಿಡುಗಡೆ ಮಾಡಲು ರಾಜ್ಯಪಾಲರು ಅನುಮೋದನೆ ನೀಡಿದ್ದಾರೆ. ಆದರೆ, ಅದನ್ನು ಬಿಡುಗಡೆ ಮಾಡಿಲ್ಲ ಎಂದು ಬೊಮ್ಮಾಯಿ ಆರೋಪಿಸಿದರು.
