Asianet Suvarna News Asianet Suvarna News

ಕಾಂಗ್ರೆಸ್‌ ಸರ್ಕಾರದ 'ಕತ್ತಲೆಭಾಗ್ಯ ಗ್ಯಾರಂಟಿ ನಂಬರ್ ಆರು' ಘೋಷಣೆ ಮಾಡಿದ ಎಚ್.ಡಿ. ಕುಮಾರಸ್ವಾಮಿ!

ಕರ್ನಾಟಕ ಕಾಂಗ್ರೆಸ್‌ ಸರ್ಕಾರದ ಗ್ಯಾರಂಟಿ ನಂಬರ್‌ 6 ಕತ್ತಲೆ ಭಾಗ್ಯವನ್ನು ಮಾಜಿ ಸಿಎಂ ಎಚ್.ಡಿ. ಕುಮಾರಸ್ವಾಮಿ ಘೋಷಣೆ ಮಾಡಿದ್ದಾರೆ.

Former CM HD Kumaraswamy announced dark fate 6th guarantee of Karnataka Congress government sat
Author
First Published Oct 10, 2023, 6:16 PM IST

ಬೆಂಗಳೂರು (ಅ.10): ಕರ್ನಾಟಕ ಕಾಂಗ್ರೆಸ್‌ ಸರ್ಕಾರದಿಂದ 5 ಅರೆಬರೆ ಗ್ಯಾರಂಟಿಗಳನ್ನು ಕೊಟ್ಟು ಕೈ ತೊಳೆದುಕೊಂಡಿದೆ, ಸರಿ. ಶೀಘ್ರವೇ ಅರೆಬರೆ ಅಲ್ಲದ ಪರಿಪೂರ್ಣವಾದ 6ನೇ ಗ್ಯಾರಂಟಿ (!?) ಕೊಡಲು ಸನ್ನಾಹವನ್ನೂ ನಡೆಸಿದೆ! ಅದರ ಹೆಸರು ಕತ್ತಲೆಭಾಗ್ಯ! ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಘೋಷಣೆ ಮಾಡಿದ್ದಾರೆ. 

ಈ ಕುರಿತು ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಪೋಸ್ಟ್‌ ಮಾಡಿಕೊಂಡಿರುವ ಮಾಜಿ ಸಿಎಂ ಕುಮಾರಸ್ವಾಮಿ, ಡಿಸೆಂಬರ್ ತಿಂಗಳ ಹೊತ್ತಿಗೆ ಕರ್ನಾಟಕ ಈ ಕತ್ತಲೆಭಾಗ್ಯದ ಕೂಪಕ್ಕೆ ಬೀಳುವುದು ಖಚಿತ. ಜನವರಿ; ಅಂದರೆ 2024ರ ಹೊಸ ವರ್ಷಕ್ಕೆ ತಾನು ಕೊಟ್ಟ ಗೃಹಜ್ಯೋತಿಗೆ ಎಳ್ಳುನೀರು ಬಿಟ್ಟು ಕಗ್ಗತ್ತಲ ಕರ್ನಾಟಕದ ಉದಯ ಮಾಡಿಸುವುದು ಗ್ಯಾರಂಟಿ.. ಗ್ಯಾರಂಟಿ. ಇದು ಸತ್ಯ ಎಂದು ಪೋಸ್ಟ್‌ ಮಾಡಿಕೊಂಡಿದ್ದಾರೆ.  ಕಾವೇರಿ ಬಗ್ಗೆ ಸರಕಾರ ಕಳ್ಳಾಟ ಆಡಿದೆ. ತಮಿಳುನಾಡು ವಿಧಾನಸಭೆಯಲ್ಲಿ ರಾಜ್ಯದ ವಿರುದ್ಧ ನಿಲುವಳಿ ಸೂಚನೆ ಅಂಗೀಕಾರವಾಗಿದೆ. ಎಮ್ಮೆ ಚರ್ಮದ ಸರಕಾರಕ್ಕೆ ಕಾವೇರಿ ಒಡಲಾಳದ ಬೇಗುದಿ ಬಗ್ಗೆ ಜಾಣ ಕುರುಡು. ಸರಕಾರ ರಾಜ್ಯದ ಉದ್ದಗಲಕ್ಕೂ ಅನಧಿಕೃತ ಲೋಡ್ ಶೆಡ್ಡಿಂಗ್ ಹೇರಿ ದಿನಕ್ಕೆ 2 ಗಂಟೆ ವಿದ್ಯುತ್ತಿಗೂ ದಿಕ್ಕಿಲ್ಲದ ದುಸ್ಥಿತಿ ನಿರ್ಮಾಣ ಮಾಡಿದೆ.

ವಿಶ್ವಕಪ್‌ ಭಾರತ- ಪಾಕಿಸ್ತಾನ ಪಂದ್ಯಕ್ಕೆ ಭಾರತೀಯರಿಗೆ ವಿಶ್‌ ಮಾಡದ ಸಿಎಂ, ಡಿಸಿಎಂ: ಓಟ್‌ ಬ್ಯಾಂಕ್‌ ಮುಲಾಜು ನೋಡಿದ್ರಾ?

ನಮ್ಮ ರೈತರಿಗೆ ಲೋಡ್ ಶೆಡ್ಡಿಂಗ್, ತಮಿಳುನಾಡಿಗೆ ಸಮೃದ್ಧ ನೀರು!! ರಾಜ್ಯದ ಎಲ್ಲಾ ಜಿಲ್ಲೆಗಳಲ್ಲೂ ವಿದ್ಯುತ್ ಅಭಾವದಿಂದ ಬೆಳೆಗಳು ಒಣಗುತ್ತಿವೆ. ನಾಲೆಗಳಲ್ಲೂ ನೀರಿಲ್ಲ, ಬೋರ್ ವೆಲ್ ಗಳಿಂದ ಪಂಪ್ ಮಾಡಲು ವಿದ್ಯುತ್ತೂ ಇಲ್ಲ. ಮೊದಲೇ ಕಷ್ಟದಲ್ಲಿರುವ ರೈತನ ಬೆನ್ನಿನ ಮೇಲೆ ಬರೆಯ ಮೇಲೆ ಬರೆ ಎಳೆಯುತ್ತದೆ ಕಾಂಗ್ರೆಸ್‌ ಸರ್ಕಾರ ಎಂದು ಪೋಸ್ಟ್‌ ಮಾಡಿಕೊಂಡಿದ್ದಾರೆ. ವಿದ್ಯುತ್ ಕ್ಷಾಮಕ್ಕೆ ಮೊದಲೇ ಕರ್ನಾಟಕ ವಿದ್ಯುತ್ ಉತ್ಪಾದನೆಯಲ್ಲಿ ಬಂಜರು ಬಿದ್ದಿದೆ. ಉತ್ಪಾದನೆಗೆ ಅಗತ್ಯವಾದ ಮೂಲಗಳ ಕ್ಷಾಮಕ್ಕೆ ತುತ್ತಾಗಿ, ಪರರಾಜ್ಯಗಳ ಮುಂದೆ ದೈನೇಸಿಯಾಗಿ ನಿಂತು ವಿದ್ಯುತ್ ಸಾಲಕ್ಕೆ ಅರ್ಜಿ ಹಾಕಿಕೊಳ್ಳುತ್ತಿದೆ. ಜಲ, ಪವನ, ಸೌರ ವಿದ್ಯುತ್ ಉತ್ಪಾದನೆ ಕುಸಿತವಾಗಿದೆ. ಇದು ದೂರದೃಷ್ಟಿಯ ಕೊರತೆ ಹಾಗೂ ನಿರ್ವಹಣೆಯ ವೈಫಲ್ಯ ಎಂದಿದ್ದಾರೆ.

ಜಲಾಶಯಗಳು ಖಾಲಿಯಾಗಿದ್ದು, ವಿದ್ಯುತ್ ಉತ್ಪಾದನೆ ಮಿತವಾಗಿ ಮಾಡುವಂತೆ ಸರಕಾರವೇ ಆದೇಶಿಸಿದೆ. ಇನ್ನೊಂದೆಡೆ ಉಷ್ಣ ವಿದ್ಯುತ್ ಸ್ಥಾವರಗಳು ಕಲ್ಲಿದ್ದಲು ಬವಣೆಯಿಂದ ಅಲ್ಪಸ್ವಲ್ಪ ಉತ್ಪಾದಿಸುತ್ತಿವೆ. ರಾಜ್ಯದ ಒಟ್ಟಾರೆ ಬೇಡಿಕೆಯಲ್ಲಿ ಶೇ.20ರಷ್ಟು ವಿದ್ಯುತ್ತನ್ನು ಸರಕಾರ ಹೊರಗಿನಿಂದಲೇ ಪಡೆಯುತ್ತಿದೆ. ರಾಜ್ಯವನ್ನು ವಿದ್ಯುತ್ ಸಾಲಕ್ಕೆ ತಳ್ಳಿ, ಕರುನಾಡನ್ನು ಬರ್ಬಾದ್ ಮಾಡಲಿದೆ ಕಾಂಗ್ರೆಸ್ ಸರಕಾರ. ಆದರೆ, ವಿದ್ಯುತ್ ಸಾಲ ನೀಡುವ ಸ್ಥಿತಿಯಲ್ಲಿ ಇತರೆ ರಾಜ್ಯಗಳೂ ಇಲ್ಲ. ಹಾಗಾದರೆ ಮುಂದೇನು? ಸಂಬಂಧಪಟ್ಟ ಸಚಿವರು ಮೌನವ್ರತ ಮಾಡುತ್ತಿದ್ದಾರೆಯೇ?

ಅಡ್ಡದಾರಿಯಲ್ಲಿ ಅಧಿಕಾರ ಪಡೆಯಲು 5 ಗ್ಯಾರಂಟಿ ಕೊಟ್ಟ ಕಾಂಗ್ರೆಸ್, 6ನೇ ಗ್ಯಾರಂಟಿ ಕತ್ತಲೆಭಾಗ್ಯವನ್ನು ನವರಾತ್ರಿಗೆ ಮೊದಲೇ ಖಾತರಿಪಡಿಸಿದೆ. ಈ ಹೊಸ ಭಾಗ್ಯ ಡಿಸೆಂಬರಿಗೋ, ಜನವರಿಗೋ ಎಂದಷ್ಟೇ ತೀರ್ಮಾನ ಆಗಬೇಕಿದೆ. ನಿರ್ವಹಣೆ, ರಿಪೇರಿ ನೆಪದಲ್ಲಿ ಇಡೀ ದಿನ ವಿದ್ಯುತ್ ಕಡಿತ ಮಾಡುತ್ತಿರುವ ಸರಕಾರದ ಸದಾರಮೆ ಆಟ ಈಗಷ್ಟೇ ಗೊತ್ತಾಗುತ್ತಿದೆ. ಹಿಂದೆ ಬರದಂತಹ ಕ್ಲಿಷ್ಟ ಸ್ಥಿತಿ ಇದ್ದರೂ ವಿದ್ಯುತ್ ಖರೀದಿಗೆ ಹಣ ಇರುತ್ತಿತ್ತು. ಈಗ ಖಜಾನೆ ಖಾಲಿಯಂತೆ!

ಲೋಕಸಭೆ ಚುನಾವಣೆವರೆಗೂ ಜನರನ್ನು ಗ್ಯಾರಂಟಿಗಳ ಅಮಲಿನಲ್ಲಿ ತೇಲಿಸಿ ತೇಲಿಸಿ.. ಆಮೇಲೆ ಕೈ ಎತ್ತಿಬಿಡುವ ದುಷ್ಟ ಹುನ್ನಾರ ಸರಕಾರದ್ದು. ಆ ಕಾರಣಕ್ಕಾಗಿಯೇ ಸರಕಾರ ಸತ್ಯ ಮರೆಮಾಚಿ ಮೊಸಳೆ ಕಣ್ಣೀರು ಹಾಕುತ್ತಿದೆ. ಆದರೆ, ಕತ್ತಲೆಭಾಗ್ಯ ಕರುಣಿಸುವ ಮುನ್ನ ಜನತೆಗೆ ಸತ್ಯವನ್ನೇ ಹೇಳಲಿ. ಬೇಡ ಎಂದವರು ಯಾರು? ಕೂಡಲೇ ವಿದ್ಯುತ್ ದುಸ್ಥಿತಿಯ ಬಗ್ಗೆ ಸರಕಾರ ಶ್ವೇತಪತ್ರ ಹೊರಡಿಸಬೇಕು. ಇದು ನನ್ನ ಆಗ್ರಹ.

ರಾಜ್ಯಾದ್ಯಂತ ಎರಡು ದಿನ ಯಲ್ಲೋ ಅಲರ್ಟ್‌: ಭಾರಿ ಮಳೆ ಮುನ್ಸೂಚನೆ ಕೊಟ್ಟ ಹವಾಮಾನ ಇಲಾಖೆ

ವಿದ್ಯುತ್ ಸಾಲಕ್ಕೂ ದಿಕ್ಕಿಲ್ಲದ ಸರಕಾರವು, ಖಾಸಗಿ ವಿದ್ಯುತ್ ಪೂರೈಕೆದಾರರಿಗೆ ಕಳೆದ ಆರೇಳು ತಿಂಗಳಿಂದ ಬಾಕಿ ಹಣ ನೀಡಿಲ್ಲ ಎನ್ನುವ ಮಾಹಿತಿ ಇದೆ. ಕೆಲ ಕಂಪನಿಗಳಿಗೆ 11 ತಿಂಗಳಿಂದ ಬಿಡಿಗಾಸು ಕೊಟ್ಟಿಲ್ಲವಂತೆ. ಇದು ಹೌದಾ? ಹೌದು ಎಂದಾದರೆ, ರಾಜ್ಯದ ಭವಿಷ್ಯದ ಗತಿ ಏನು? ಕೃಷಿ, ಕೈಗಾರಿಕೆಗಳ ಪಾಡೇನು? ಬೇಕಾಬಿಟ್ಟಿ ಬೆಲೆ ಏರಿಕೆ ಬರೆ  ಎಳೆಸಿಕೊಂಡು ಏದುಸಿರು ಬಿಡುತ್ತಿರುವ ಜನರಿಗೆ ಸರಕಾರದ ಉತ್ತರವೇನು? ಕೃತಕ ಕತ್ತಲು ಸೃಷ್ಟಿಸಿ ಕಬ್ಬೆಕ್ಕಿನಂತೆ ಕದ್ದು ಹಾಲು ಕುಡಿಯುತ್ತೇವೆ ಎಂದರೆ ಆಗುವುದಿಲ್ಲ. ಜನರಿಗೂ ಕಳ್ಳಬೆಕ್ಕಿನ ಕಣ್ಣಾಮುಚ್ಚಾಲೆ ಈಗೀಗ ಚೆನ್ನಾಗಿ ಅರ್ಥವಾಗುತ್ತಿದೆ ಎಂದು ಬರೆದುಕೊಂಡಿದ್ದಾರೆ.

Follow Us:
Download App:
  • android
  • ios