ತಮಿಳುನಾಡಿಗೆ ನೀರು ಹರಿಸುವುದನ್ನು ನಿಲ್ಲಿಸಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸರ್ವಪಕ್ಷ ಸಭೆ ಕರೆಯಬೇಕು ಎಂದು ಮಾಜಿ ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ಒತ್ತಾಯಿಸಿದ್ದಾರೆ. 

ಬೆಂಗಳೂರು (ಆ.18): ತಮಿಳುನಾಡಿಗೆ ನೀರು ಹರಿಸುವುದನ್ನು ನಿಲ್ಲಿಸಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸರ್ವಪಕ್ಷ ಸಭೆ ಕರೆಯಬೇಕು ಎಂದು ಮಾಜಿ ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ಒತ್ತಾಯಿಸಿದ್ದಾರೆ. ಈ ಬಗ್ಗೆ ಸರಣಿ ಟ್ವೀಟ್‌ ಮಾಡಿರುವ ಅವರು, ಮೇಕೆದಾಟು ಪಾದಯಾತ್ರೆ ಹೈಡ್ರಾಮಾ ಮಾಡಿ ಕನ್ನಡಿಗರ ತಲೆ ಮೇಲೆ ಮಕ್ಮಲ್‌ ಟೋಪಿ ಇಟ್ಟಕಾಂಗ್ರೆಸ್‌ ಈಗ ‘ಇಂಡಿಯಾ’ಗೆ ಜೀವದಾನ ಮಾಡಲು ರಾಜ್ಯದ ಕಾವೇರಿ ಹಿತವನ್ನೇ ಬಲಿದಾನ ಮಾಡಿದೆ ಎಂದು ಕಿಡಿಕಾರಿದ್ದಾರೆ.

ಕಾಂಗ್ರೆಸ್‌ ಸರ್ಕಾರ ಕನ್ನಡಿಗರಿಗೆ, ಅದರಲ್ಲಿಯೂ ಅನ್ನದಾತರಿಗೆ ಘೋರ ವಿಶ್ವಾಸದ್ರೋಹ ಎಸಗಿದೆ. ಬಹುಮತದ ಸರ್ಕಾರ ಬಂದಿದೆ ಎಂದಾಕ್ಷಣ ರಾಜ್ಯದ ಜನತೆಯನ್ನು, ಪ್ರತಿಪಕ್ಷಗಳನ್ನು ವಿಶ್ವಾಸಕ್ಕೆ ತೆಗೆದುಕೊಳ್ಳುತ್ತಿಲ್ಲ. ಮಳೆ ಅಭಾವದಿಂದ ಜಲಾಶಯಗಳು ತುಂಬಿಲ್ಲ. ರೈತರ ಬೆಳೆಗೆ ನೀರಿಲ್ಲ, ಬೆಂಗಳೂರಿಗೆ ಕುಡಿಯುವ ನೀರಿಗೂ ತತ್ವಾರ. ನಮ್ಮ ಹೊಟ್ಟೆಗೆ ಹಿಟ್ಟಿಲ್ಲ, ನೆರೆಮನೆಯವರ ಜುಟ್ಟಿಗೆ ಮಲ್ಲಿಗೆ ಮುಡಿಸಲು ಹೊರಟಿದೆ ಸರ್ಕಾರ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಹಿರಿಯ ರಾಜಕಾರಣಿ ಕಾಗೋಡು ತಿಮ್ಮ​ಪ್ಪರಿಗೆ ದೇವ​ರಾಜ ಅರಸು ಪ್ರಶ​ಸ್ತಿ ಗರಿ

1962ರಿಂದಲೂ ಕಾವೇರಿ ಕೊಳ್ಳದ ರೈತರಿಗಾಗಿ ಜೆಡಿಎಸ್‌ ಎಚ್‌.ಡಿ.ದೇವೇಗೌಡ ಅವರು ಜೀವವನ್ನೇ ತೇದರು. ಕಾವೇರಿಗಾಗಿ ಹಿಂದಿನ ಪ್ರತಿ ಸರ್ಕಾರವೂ ಕೇಂದ್ರಕ್ಕೆ ಸೆಡ್ಡು ಹೊಡೆದು ತಮಿಳುನಾಡು ಅಬ್ಬರಕ್ಕೆ ಅಂಕೆ ಹಾಕಿದ್ದವು. ಇಂತಹ ಕೆಚ್ಚಿನ ಕರ್ನಾಟಕ ಇತಿಹಾಸದಲ್ಲಿಯೇ ಈ ಸರ್ಕಾರವು ನೆರೆ ರಾಜ್ಯ ಸುಪ್ರೀಂಕೋರ್ಟ್‌ಗೆ ಅರ್ಜಿ ಹಾಕಿದಾಕ್ಷಣ ಬೆದರಿ ಕೈ ಚೆಲ್ಲಿದೆ. ಸಂಕಷ್ಟಸ್ಥಿತಿಯ ಬಗ್ಗೆ ರಾಜ್ಯ ಕಾಂಗ್ರೆಸ್‌ ಸರ್ಕಾರ ಸುಪ್ರೀಂಕೋರ್ಟ್‌ಗೆ ಮನವರಿಕೆ ಮಾಡಕೊಡಲಿಲ್ಲ, ಯಾಕೆ? ಕಾನೂನು ತಜ್ಞರ ಜತೆ, ಪ್ರತಿಪಕ್ಷ ಮುಖಂಡರ ಜತೆ ಸಮಾಲೋಚನೆ ನಡೆಸದೇ ವಾಯುವೇಗದಲ್ಲಿ ತಮಿಳುನಾಡಿಗೆ ನೀರು ಹರಿಸಿದ ಒಳಗುಟ್ಟೇನು? ಜನತೆಗೆ ಗೊತ್ತಾಗಬೇಕಿದೆ ಎಂದು ಹೇಳಿದ್ದಾರೆ.

ತಮಿ​ಳು​ನಾಡಿನ ಹೊಸೂರು ಉದ್ಧಾರ ಆಗಲು ಎಚ್‌ಡಿಕೆ ಕಾರಣ: ಸಂಸದ ಡಿ.ಕೆ.ಸುರೇಶ್‌

ಜಲಸಂಪನ್ಮೂಲ ಸಚಿವರೂ ಆಗಿರುವ ಉಪಮುಖ್ಯಮಂತ್ರಿಯವರು ತಾವು ಸಚಿವರಾಗಿರುವುದು ಕರ್ನಾಟಕಕ್ಕೋ ಅಥವಾ ತಮಿಳುನಾಡಿಗೋ? ಎಂಬುದನ್ನು ಸ್ಪಷ್ಟಪಡಿಸಬೇಕಿದೆ. ಕಾವೇರಿ ಕೀಲಿ ಕೇಂದ್ರ ಬಳಿ ಇದೆ ಎಂದಾದರೆ ಇವರ ಹೊಣೆ ಏನು? ಆ ಕೀಲಿ ಈಗ ಸ್ಟಾಲಿನ್‌ ಕೈಯ್ಯಲ್ಲಿದೆಯೋ ಅಥವಾ ಸೋನಿಯಾ ಗಾಂಧಿ ಕೈಯ್ಯಲ್ಲಿದೆಯೋ? ತಾಕತ್ತಿದ್ದರೆ ಕೋರ್ಟ್‌ಗೆ ಹೋಗಿ ಎಂದು ರೈತರಿಗೆ ಉಪಮುಖ್ಯಮಂತ್ರಿಗಳು ಹೇಳಿರುವುದು ದರ್ಪ, ದುರಹಂಕಾರದ ಪರಾಕಾಷ್ಠೆ. ನಿತ್ಯವೂ ಸಾವಿರಾರು ಕ್ಯೂಸೆಕ್‌ ಕಾವೇರಿ ನೀರು ನೆರೆ ರಾಜ್ಯಕ್ಕೆ ಹೋಗುತ್ತಿದೆ. ಇನ್ನೂ 10 ಟಿಎಂಸಿ ಬಿಡುತ್ತೇವೆ ಎಂದಿರುವುದು ಸರಿಯಲ್ಲ ಎಂದು ಕುಮಾರಸ್ವಾಮಿ ವಾಗ್ದಾಳಿ ನಡೆಸಿದ್ದಾರೆ.