ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು 2028ರ ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸುವುದಿಲ್ಲ ಎಂದು ಘೋಷಿಸಿದ್ದಾರೆ. ರಾಜಕೀಯ ಕ್ಷೇತ್ರ ಕಲುಷಿತಗೊಂಡಿರುವುದೇ ಇದಕ್ಕೆ ಕಾರಣವೆಂದು ತಿಳಿಸಿದ್ದು, ಸಕ್ರಿಯ ರಾಜಕಾರಣದಲ್ಲಿ ಮುಂದುವರಿದು ಜನರ ಧ್ವನಿಯಾಗಿ ಉಳಿಯುವುದಾಗಿ ಹೇಳಿದ್ದಾರೆ.
ಕೆ.ಆರ್.ಪೇಟೆ (ಜು.26): ರಾಜಕೀಯ ಕ್ಷೇತ್ರ ಇಂದು ಕಲುಷಿತಗೊಂಡಿರುವುದರಿಂದ 2028ರ ವಿಧಾನಸಭಾ ಚುನಾವಣೆಯಲ್ಲಿ ನಾನು ಸ್ಪರ್ಧಿಸುವುದಿಲ್ಲ. ಆದರೆ, ಸಕ್ರಿಯ ರಾಜಕಾರಣದಲ್ಲಿದ್ದು, ಜನರ ಕಷ್ಟ, ಸುಖಗಳಿಗೆ ಧ್ವನಿಯಾಗಿ ನಿಲ್ಲುತ್ತೇನೆ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.
ಕೆ.ಆರ್.ಪೇಟೆಯಲ್ಲಿ ಮಾಜಿ ಸ್ಪೀಕರ್ ದಿ.ಕೃಷ್ಣರ 86ನೇ ಜನ್ಮದಿನದ ಅಂಗವಾಗಿ ಪ್ರತಿಷ್ಠಾನದಿಂದ ಆಯೋಜಿಸಿದ್ದ ಸಮಾರಂಭ ಉದ್ಘಾಟಿಸಿ ಮಾತನಾಡಿ, ಈ ಹಿಂದೆ ರಾಜಕೀಯವಾಗಿ ಸ್ಪರ್ಧೆ ಮಾಡಿದಾಗ ಕ್ಷೇತ್ರದ ಜನರೇ ನಮಗೆ ದುಡ್ಡುಕೊಟ್ಟು ಗೆಲ್ಲಿಸಿಕೊಂಡು ಬರುತ್ತಿದ್ದರು. ಆದರೆ, ಇಂದು ಅಂತಹ ಪರಿಸ್ಥಿತಿ ಇಲ್ಲ ಎಂದು ಬೇಸರ ವ್ಯಕ್ತಪಡಿಸಿದರು.
ಇದನ್ನೂ ಓದಿ:ವಿಶೇಷ ಸಂಪಾದಕೀಯ | ಮೋದಿಗಷ್ಟೇ ಅಲ್ಲ, ಸಿಎಂ ಡಿಕೆಶಿಗೂ ಜಿರಳೆ ಎಚ್ಚರಿಕೆ!
ಚುನಾವಣೆಯಲ್ಲಿ ಸ್ಪರ್ಧಿಸಿದರೆ ನಾವು ಜನರಿಗೆ ದುಡ್ಡುಕೊಡಬೇಕಾದ ಕಾಲ ಬಂದಿದೆ. ಇಂದು ರಾಜಕಾರಣ ಸಾಕಷ್ಟು ಕಲುಷಿತವಾಗಿದೆ. ಪ್ರಾಮಾಣಿಕ ರಾಜಕಾರಣಕ್ಕೆ ಉಳಿಗಾಲ್ಲವಿಲ್ಲದಂತಾಗಿದೆ. ಈ ಹಿನ್ನೆಲೆಯಲ್ಲಿ ಮುಂದಿನ ಚುನಾವಣೆಗಳಲ್ಲಿ ನಾನು ಸ್ಪರ್ಧಿಸುವುದಿಲ್ಲ ಎಂದರು.
ದಿ.ಕೃಷ್ಣರನ್ನು ಕ್ಷೇತ್ರದ ಜನ ಬಯಸುತ್ತಿದ್ದರು. ಆದರೆ, ಅವರು ಕಲುಷಿತ ರಾಜಕೀಯ ವ್ಯವಸ್ಥೆಯಿಂದ ನಿವೃತ್ತಿ ಘೋಷಿಸಿ ಸಕ್ರಿಯ ರಾಜಕಾರಣದಿಂದ ದೂರ ಉಳಿದರು. ಜನ ಬಯಸುತ್ತಿರುವಾಗಲೇ ರಾಜಕೀಯ ನಿವೃತ್ತಿ ಘೋಷಿಸಿದ ಕೃಷ್ಣ ಇಂದು ನಮ್ಮೊಂದಿಗಿಲ್ಲ. ಆದರೆ, ಅವರು ಬಿಟ್ಟು ಹೋಗಿರುವ ರಾಜಕೀಯ ಆದರ್ಶಗಳು ನಮ್ಮ ಮುಂದಿವೆ. ಕೃಷ್ಣರಂತೆ ಬದುಕಿನ ಆದರ್ಶಗಳನ್ನು ಬಿಟ್ಟು ಹೋಗಿರುವವರ ನೆನಪಿನ ಕಾರ್ಯಕ್ರಮಗಳು ರಾಜ್ಯದೆಲ್ಲೆಡೆ ನಡೆಯಬೇಕು ಎಂದು ಆಶಿಸಿದರು.


